ಎಸ್ಸಿ-ಎಸ್ಟಿ ವರ್ಗದವರು ಸ್ವಾಭಿಮಾನದಿಂದ ಬದುಕುವ ಅವಕಾಶ ಕಲ್ಪಿಸಿ : ಸಿಎಂ ಯಡಿಯೂರಪ್ಪ

ಬೆಂಗಳೂರು, ಮೇ 28: `ರಾಜ್ಯದಲ್ಲಿನ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಸಮಗ್ರ ಅಭಿವೃದ್ಧಿಯ ದೃಷ್ಟಿಯಿಂದ ಸರಕಾರ ನಿಗದಿಪಡಿಸಿರುವ ವಿಶೇಷ ಉಪಯೋಜನೆಗಳ ಅನುದಾನವನ್ನು ಸದ್ಬಳಕೆ ಮಾಡುವ ಮೂಲಕ ಎಸ್ಸಿ-ಎಸ್ಟಿ ವರ್ಗದವರು ಸ್ವಾಭಿಮಾನದಿಂದ ಬದುಕುವ ಎಲ್ಲ ಅವಕಾಶಗಳನ್ನು ಕಲ್ಪಿಸಬೇಕು’ ಎಂದು ಮುಖ್ಯಮಂತ್ರಿ ಯಡಿಯೂರಪ್ಪ, ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಗುರುವಾರ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆದ ಅನುಸೂಚಿತ ಜಾತಿಗಳು/ಅನುಸೂಚಿತ ಪಂಗಡಗಳ ರಾಜ್ಯ ಅಭಿವೃದ್ಧಿ ಪರಿಷತ್ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಎಸ್ಸಿ-ಎಸ್ಟಿ ವರ್ಗದ ಅಭಿವೃದ್ಧಿಗೆ ಆದ್ಯತೆ ನೀಡಬೇಕು. 2020-21ನೆ ಸಾಲಿನಲ್ಲಿ ಪರಿಶಿಷ್ಟ ಜಾತಿಯ ಅಭಿವೃದ್ಧಿಗೆ 19,432 ಕೋಟಿ ರೂ. ಹಾಗೂ ಪರಿಶಿಷ್ಟ ಪಂಗಡದ ಅಭಿವೃದ್ಧಿಗೆ 8,267 ಕೋಟಿ ರೂ.ಸೇರಿದಂತೆ ಒಟ್ಟು 27,699 ಕೋಟಿ ರೂ.ಅನುದಾನ ಒದಗಿಸಲಾಗಿದ್ದು, ಎಲ್ಲ ಇಲಾಖೆಗಳ ಕ್ರಿಯಾ ಯೋಜನೆಗಳ ಬಗ್ಗೆ ಚರ್ಚಿಸಿ ಅನುಮೋದನೆ ನೀಡಲಾಗಿದೆ ಎಂದರು.

ನಿಗದಿತ ಅವಧಿಯೊಳಗೆ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸಬೇಕು. ಪ್ರಸಕ್ತ ವರ್ಷದ ಪರಿಸ್ಥಿತಿಯನ್ನು ಗಮನಿಸಿ ಆರ್ಥಿಕ ಅಭಿವೃದ್ಧಿ ಕಾರ್ಯ ಕ್ರಮಗಳಿಗೆ ಸಂಬಂಧಿಸಿದಂತೆ ಹೆಚ್ಚಿನ ಜನರಿಗೆ ಸಹಾಯವಾಗುವಂತಹ ಯೋಜನೆಗಳನ್ನು ಅನುಷ್ಠಾನಗೊಳಿಸಬೇಕು. ಆ ಮೂಲಕ ಪರಿಶಿಷ್ಟರ ಕಲ್ಯಾಣಕ್ಕೆ ಕ್ರಮ ವಹಿಸಬೇಕು ಎಂದು ಅವರು ನಿರ್ದೇಶನ ನೀಡಿದರು.

ಕೊರೋನ ವೈರಸ್ ಸೋಂಕಿನ ಹಿನ್ನೆಲೆಯಲ್ಲಿ ಉತ್ತರ ಕರ್ನಾಟಕದ ಜಿಲ್ಲೆಗಳಿಗೆ 25ರಿಂದ 30 ಸಾವಿರಕ್ಕೂ ಅಧಿಕ ಮಂದಿ ಹಿಂದಿರುಗಿದ್ದು, ಅವರಿಗೆ ಮಹಾತ್ಮ ಗಾಂಧಿ ಉದ್ಯೋಗ ಖಾತರಿ ಯೋಜನೆಯಡಿ ಪ್ರತಿಯೊಂದು ಎಸ್ಸಿ-ಎಸ್ಟಿ ಕುಟುಂಬಕ್ಕೆ ಜಾಬ್‍ಕಾರ್ಡ್‍ಗಳನ್ನು ಕಡ್ಡಾಯವಾಗಿ ವಿತರಣೆ ಮಾಡಬೇಕು. ಕಾರ್ಮಿಕರಿಗೆ ಪ್ರಸ್ತುತ ಇರುವ ಕನಿಷ್ಠ 100 ದಿನಗಳ ಕೆಲಸವನ್ನು 150 ದಿನಗಳಿಗೆ ಹೆಚ್ಚಿಸಲು ಕೋರಿ ಕೇಂದ್ರಕ್ಕೆ ಪತ್ರ ಬರೆಯಬೇಕು ಎಂದು ಬಿಎಸ್‍ವೈ ಸೂಚಿಸಿದರು.

ಸಭೆಯಲ್ಲಿ ಪಾಲ್ಗೊಂಡಿದ್ದ ಉಪಮುಖ್ಯಮಂತ್ರಿ ಗೋವಿಂದ ಎಂ.ಕಾರಜೋಳ ಮಾತನಾಡಿ, ಮಾರಕ ಕೊರೋನ ಸೋಂಕಿನ ಹಿನ್ನೆಲೆಯಲ್ಲಿ ಮಂಡಿಸಿರುವ ಬಜೆಟ್‍ಗೆ ಅನುಗುಣವಾಗಿ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸಲು ಸಂಪನ್ಮೂಲ ಕ್ರೋಡೀಕರಣ ಹಾಗೂ ಅನುದಾನ ಲಭ್ಯತೆ ಆಧರಿಸಿ ಕ್ರಿಯಾ ಯೋಜನೆಯನ್ನು ಜಾರಿಗೊಳಿಸಲಾಗುವುದು ಎಂದು ತಿಳಿಸಿದರು.

ಸಭೆಯಲ್ಲಿ ಉಪಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥ ನಾರಾಯಣ, ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್. ಈಶ್ವರಪ್ಪ, ಕಾನೂನು ಸಚಿವ ಮಾಧುಸ್ವಾಮಿ, ಕಂದಾಯ ಸಚಿವ ಆರ್.ಅಶೋಕ್, ಅಭಿವೃದ್ಧಿ ಪರಿಷತ್ತಿನ ಸದಸ್ಯ ದುರ್ಯೋಧನ ಐಹೊಳೆ, ಸಂಸದ ಉಮೇಶ್ ಜಾಧವ್, ಶಾಸಕರಾದ ಎನ್.ಮಹೇಶ್, ರಾಜುಗೌಡ, ಮುಖ್ಯ ಕಾರ್ಯದರ್ಶಿ ವಿಜಯಭಾಸ್ಕರ್, ಸಮಾಜ ಕಲ್ಯಾಣ ಇಲಾಖೆಯ ಕುಮಾರ್ ನಾಯಕ್ ಭಾಗವಹಿಸಿದ್ದರು.

Please follow and like us:
error