ಒಂದೇ ದಿನ 249 ಕೋವಿಡ್ ಪ್ರಕರಣಗಳು ಪಾಸಿಟಿವ್ : ರಾಜ್ಯದಲ್ಲಿ ಮತ್ತೆ ಐವರು ಬಲಿ, ಸಾವಿನ ಸಂಖ್ಯೆ 142ಕ್ಕೆ ಏರಿಕೆ

 

ಬೆಂಗಳೂರು, : ಕರ್ನಾಟಕದಲ್ಲಿ ಒಂದೇ ದಿನ ಮತ್ತೆ 249 ಮಂದಿಗೆ ಕೊರೋನ ವೈರಸ್ ಸೋಂಕು ದೃಢಪಟ್ಟಿದ್ದು, ಈ ಮೂಲಕ ಸೋಂಕಿತರ ಒಟ್ಟು ಸಂಖ್ಯೆ 9,399 ಕ್ಕೆ ಏರಿಕೆಯಾಗಿದೆ. ಬೆಂಗಳೂರು ನಗರ ಜಿಲ್ಲೆಯಲ್ಲಿ ಮೂರು, ಬಳ್ಳಾರಿ ಮತ್ತು ರಾಮನಗರ ಜಿಲ್ಲೆಯಲ್ಲಿ ತಲಾ ಒಂದು ಸಾವು ಸಂಭವಿಸಿದ್ದು, ಒಟ್ಟು ಸಾವಿನ ಸಂಖ್ಯೆ 142ಕ್ಕೆ ಏರಿದೆ .ಇಂದು ಸಂಜೆ ಬಿಡುಗಡೆಗೊಳಿಸಿದ ಬುಲೆಟಿನ್ ನಲ್ಲಿ ರವಿವಾರ ಸಂಜೆ 5 ಗಂಟೆಯಿಂದ ಸೋಮವಾರ ಸಂಜೆ 5 ಗಂಟೆವರೆಗೆ ಐದು ಸಾವು, 249 ಕೋವಿಡ್ ಪ್ರಕರಣಗಳು ಪಾಸಿಟಿವ್ ಬಂದಿರುವುದಾಗಿ ಮಾಹಿತಿ ನೀಡಲಾಗಿದೆ.

ಬೆಂಗಳೂರು ನಗರ ಜಿಲ್ಲೆಯಲ್ಲಿ ಸಾವಿನ ಸರಣಿ ಮುಂದುವರಿದಿದ್ದು, ಇಂದು ಒಂದೇ ದಿನ ಮೂರು ಮಂದಿ ಕೊರೋನ ಸೋಂಕಿಗೆ ಬಲಿಯಾಗಿದ್ದಾರೆ. ಈ ಮೂಲಕ ಜಿಲ್ಲೆಯಲ್ಲಿ ಮೃತರ ಸಂಖ್ಯೆ 67ಕ್ಕೆ ಹೆಚ್ಚಳವಾಗಿದೆ. ಜಿಲ್ಲೆಯ 70 ವರ್ಷದ ವ್ಯಕ್ತಿ, 45 ವರ್ಷದ ವ್ಯಕ್ತಿ, 38 ವರ್ಷದ ಮಹಿಳೆ ಮೃತಪಟ್ಟಿದ್ದಾರೆ. ಬಳ್ಳಾರಿ ಜಿಲ್ಲೆಯ 60 ವರ್ಷದ ಮಹಿಳೆ ಮತ್ತು ರಾಮನಗರ ಜಿಲ್ಲೆಯ 90 ವರ್ಷದ ವೃದ್ಧರೊಬ್ಬರು ಸೋಂಕಿಗೆ ಬಲಿಯಾಗಿದ್ದಾರೆ.

ಸೋಂಕು ಖಚಿತಗೊಂಡ ಪ್ರಕರಣಗಳ ಪೈಕಿ ಬೆಂಗಳೂರು ನಗರ 126, ಕಲಬುರಗಿ 27, ವಿಜಯಪುರ 15, ಉಡುಪಿ 14, ದಕ್ಷಿಣ ಕನ್ನಡ 12, ದಾವಣಗೆರೆ 9, ಉತ್ತರ ಕನ್ನಡ ಹಾಗೂ ಬಾಗಲಕೋಟೆಯಲ್ಲಿ ತಲಾ 6, ಬೀದರ್ ಹಾಗೂ ಚಿಕ್ಕಮಗಳೂರು ತಲಾ 5, ಧಾರವಾಡ ಹಾಗೂ ಬೆಂಗಳೂರು ಗ್ರಾಮಾಂತರದಲ್ಲಿ ತಲಾ 4, ರಾಮನಗರ 3, ಚಿತ್ರಗುರ್ಗ, ಕೋಲಾರ, ಕೊಡಗು ಮತ್ತು ತುಮಕೂರಿನಲ್ಲಿ ತಲಾ 2, ಯಾದಗಿರಿ, ಮೈಸೂರು, ಚಿಕ್ಕಬಳ್ಳಾಪುರ, ಗದಗ ಹಾಗೂ ಕೊಪ್ಪಳ ಜಿಲ್ಲೆಯಲ್ಲಿ ತಲಾ 1 ಪ್ರಕರಣ ಪಾಸಿಟಿವ್ ಬಂದಿದೆ.

ಒಟ್ಟಾರೆ ರಾಜ್ಯದಲ್ಲಿ 9,399 ಕೊರೋನ ಸೋಂಕಿತರ ಪೈಕಿ 5,730 ಮಂದಿ ಸಂಪೂರ್ಣ ಗುಣಮುಖರಾಗಿದ್ದಾರೆ. ಇದರಲ್ಲಿ ಇಂದು ಒಂದೇ ದಿನ 111 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಉಳಿದಂತೆ ಇದುವರೆಗೆ 142 ಮಂದಿ ಸೋಂಕಿನಿಂದ ಸಾವನ್ನಪ್ಪಿದ್ದು, 3,523 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.

 

Please follow and like us:
error