ಕೆ.ಸಿ.ರಾಮಮೂರ್ತಿ ಅವಿರೋಧವಾಗಿ ರಾಜ್ಯಸಭೆ ಸದಸ್ಯರಾಗಿ ಆಯ್ಕೆ

ಬೆಂಗಳೂರು, ಡಿ. 5: ಕಾಂಗ್ರೆಸ್ ಹಾಗೂ ರಾಜ್ಯಸಭೆ ಸದಸ್ಯ ಸ್ಥಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರ್ಪಡೆಯಾಗಿದ್ದ ನಿವೃತ್ತ ಪೊಲೀಸ್ ಅಧಿಕಾರಿ ಕೆ.ಸಿ.ರಾಮಮೂರ್ತಿ ಅವರು ಉಪಚುನಾವಣೆಯಲ್ಲಿ ಅವಿರೋಧವಾಗಿ ರಾಜ್ಯಸಭೆ ಸದಸ್ಯರಾಗಿ ಆಯ್ಕೆಯಾಗಿದ್ದಾರೆ.

ರಾಮಮೂರ್ತಿ ಅವರ ರಾಜೀನಾಮೆಯಿಂದ ತೆರವಾಗಿದ್ದ ಸ್ಥಾನಕ್ಕೆ ಡಿ.12ರಂದು ಉಪಚುನಾವಣೆ ನಡೆಯಬೇಕಿತ್ತು. ಆದರೆ, ಕಾಂಗ್ರೆಸ್-ಜೆಡಿಎಸ್ ಪಕ್ಷಗಳು ತಮ್ಮ ಅಭ್ಯರ್ಥಿಗಳನ್ನು ಕಣಕ್ಕಿಳಿಸದ ಹಿನ್ನೆಲೆಯಲ್ಲಿ ರಾಮಮೂರ್ತಿ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆಂದು ಚುನಾವಣಾಧಿಕಾರಿ ಎಂ.ಕೆ.ವಿಶಾಲಾಕ್ಷಿ ಘೋಷಿಸಿದ್ದಾರೆ.

ಗುರುವಾರ ವಿಧಾನಸೌಧದಲ್ಲಿ ರಾಜಸಭೆಯ ನೂತನ ಸದಸ್ಯರಾಗಿ ಆಯ್ಕೆಯಾದ ಕೆ.ಸಿ.ರಾಮಮೂರ್ತಿ, ವಿಧಾನಸಭೆ ಕಾರ್ಯದರ್ಶಿಯಾಗಿರುವ ಚುನಾವಣಾಧಿಕಾರಿ ವಿಶಾಲಾಕ್ಷಿ ಅವರಿಂದ ಪ್ರಮಾಣ ಪತ್ರವನ್ನು ಸ್ವೀಕರಿಸಿದರು. ರಾಮಮೂರ್ತಿ ಅವರಿಗೆ ಸಿಎಂ ಯಡಿಯೂರಪ್ಪ ಸೇರಿ ಹಲವು ಗಣ್ಯರು ಅಭಿನಂದನೆ ಸಲ್ಲಿಸಿದ್ದಾರೆ.

ನಿವೃತ್ತ ಪೊಲೀಸ್ ಅಧಿಕಾರಿಯಾಗಿದ್ದ ಕೆ.ಸಿ.ರಾಮಮೂರ್ತಿ ಸಿಎಆರ್ ಶಿಕ್ಷಣ ಸಂಸ್ಥೆಯ ಅಧ್ಯಕ್ಷ, ಬೆಂಗಳೂರು ವಿಶ್ವವಿದ್ಯಾಲಯದ ರಿಜಿಸ್ಟ್ರಾರ್, ಯುವಜನ ಸೇವೆ, ಸಂಚಾರ ಮತ್ತು ರಸ್ತೆ ಸುರಕ್ಷತೆಯ ಆಯುಕ್ತರು, ಬೆಂಗಳೂರು ಸಂಚಾರ ವಿಭಾಗದ ಹೆಚ್ಚುವರಿ ಆಯುಕ್ತರಾಗಿ ಸೇವೆ ಸಲ್ಲಿಸಿದ್ದಾರೆ. 2016ರಲ್ಲಿ ರಾಜ್ಯ ವಿಧಾನಸಭೆಯಿಂದ ರಾಜ್ಯಸಭೆಗೆ ಮೊದಲ ಬಾರಿಗೆ ಆಯ್ಕೆಯಾಗಿದ್ದರು.

‘ಪ್ರಧಾನಿ ಮೋದಿಯವರ ಅಭಿವೃದ್ಧಿ ಕಾರ್ಯಕ್ರಮಗಳಿಂದ ಪ್ರೇರಿತನಾಗಿ ನಾನು ಬಿಜೆಪಿಗೆ ಸೇರ್ಪಡೆಯಾಗಿದ್ದು, ದೇಶಕ್ಕೆ ಮತ್ತಷ್ಟು ಉತ್ತಮ ಕೆಲಸ ನಿರ್ವಹಿಸುವೆ. ನನಗೆ ಮೊದಲಿನಿಂದಲೂ ಬಿಜೆಪಿ ಜತೆ ಸ್ನೇಹವಿತ್ತು. ಅವರೊಂದಿಗೆ ಕೆಲಸ ಮಾಡಲಿದ್ದು, ರಾಜ್ಯದ ಅಭಿವೃದ್ಧಿಗೆ ಶ್ರಮಿಸುವೆ. ರಾಜ್ಯಸಭೆಗೆ ನನ್ನನ್ನು ಅವಿರೋಧ ಆಯ್ಕೆ ಮಾಡಿದ ಸಿಎಂ ಬಿಎಸ್‌ವೈ ಸೇರಿ ಎಲ್ಲರಿಗೂ ಧನ್ಯವಾದಗಳನ್ನು ಸಲ್ಲಿಸುತ್ತೇನೆ’

-ಕೆ.ಸಿ.ರಾಮಮೂರ್ತಿ, ರಾಜ್ಯಸಭೆ ನೂತನ ಸದಸ್ಯ

‘ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆಯಾಗಿರುವ ಬಿಜೆಪಿಯ ಅಭ್ಯರ್ಥಿ ಕೆ.ಸಿ.ರಾಮಮೂರ್ತಿ ಅವರಿಗೆ ಅಭಿನಂದನೆಗಳು. ರಾಮಮೂರ್ತಿ ಅವಿರೋಧ ಆಯ್ಕೆಯಿಂದ ರಾಜ್ಯಸಭೆಯಲ್ಲಿ ಬಿಜೆಪಿ ಸಂಖ್ಯಾಬಲ ಹೆಚ್ಚಿರುವುದಲ್ಲದೆ, ಪಕ್ಷ ಇನ್ನಷ್ಟು ಬಲಿಷ್ಠಗೊಳ್ಳಲು ಪೂರಕವಾಗಲಿದೆ’

-ಬಿ.ಎಸ್.ಯಡಿಯೂರಪ್ಪ, ಮುಖ್ಯಮಂತ್ರಿ

Please follow and like us:
error