ಕೋವಿಡ್ ನಿರ್ಬಂಧಗಳನ್ನು ಜಿಲ್ಲಾಧಿಕಾರಿಗಳು ಕಟ್ಟುನಿಟ್ಟಾಗಿ ಕಾರ್ಯಗತಕ್ಕೆ ತರಬೇಕು-CM ಬಿ.ಎಸ್. ಯಡಿಯೂರಪ್ಪ

ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಜಿಲ್ಲಾಧಿಕಾರಿಗಳೊಂದಿಗೆ ಸಿ.ಎಂ ವಿಡಿಯೋ ಸಂವಾದ

ಕೊಪ್ಪಳ,  : ಕೋವಿಡ್ ನಿಯಂತ್ರಣ ಹಿನ್ನೆಲೆಯಲ್ಲಿ ಮೇ 12 ರವರೆಗೆ ರಾಜ್ಯದಲ್ಲಿ ಹಲವಾರು ನಿರ್ಬಂಧಗಳನ್ನು ಹಾಕಲಾಗಿದ್ದು, ಆಯಾ ಜಿಲ್ಲೆಯ ಜಿಲ್ಲಾಧಿಕಾರಿಗಳು ಇವುಗಳನ್ನು ಕಟ್ಟುನಿಟ್ಟಾಗಿ ಕಾರ್ಯಗತಕ್ಕೆ ತರಬೇಕು ಮತ್ತು ಕೋವಿಡ್ ನಿಯಂತ್ರಣ ಹಾಗೂ ರೋಗಿಗಳನ್ನು ಚೆನ್ನಾಗಿ ನೋಡಿಕೊಳ್ಳಬೇಕು ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದರು.
ಅವರು ಗುರುವಾರದಂದು ಕೋವಿಡ್ ನಿಯಂತ್ರಣ ಮತ್ತು ಕೋವಿಡ್ ರೋಗಿಗಳನ್ನು ಚೆನ್ನಾಗಿ ನೋಡಿಕೊಳ್ಳುವ ಕುರಿತು ಜಿಲ್ಲಾ ಉಸ್ತುವಾರಿ ಸಚಿವರು ಮತ್ತು ಜಿಲ್ಲಾಧಿಕಾರಿಗಳೊಂದಿಗೆ ಆಯೋಜಿಸಿದ್ದ ವಿಡಿಯೋ ಸಂವಾದದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಜಿಲ್ಲಾಧಿಕಾರಿಗಳೊಂದಿಗೆ ಸಂವಾದ ನಡೆಸಿ ಅವರು ಮಾತನಾಡಿದರು.
ಆಯಾ ಜಿಲ್ಲಾಧಿಕಾರಿಗಳಿಗೆ ಎಲ್ಲ ಅಧಿಕಾರವನ್ನು ನೀಡಲಾಗಿದ್ದು, ಯಾವುದೇ ಸಮಸ್ಯೆಗಳನ್ನು ಬರದಂತೆ ನೋಡಿಕೊಳ್ಳಬೇಕು. ಯಾವುದೇ ಸಮಸ್ಯೆಯಾದರೆ ಅದಕ್ಕೆ ಜಿಲ್ಲಾಧಿಕಾರಿಗಳನ್ನೇ ಜವಾಬ್ದಾರರನ್ನಾಗಿ ಮಾಡಲಾಗುವುದು. ಜನರಿಗೆ ತೊಂದರೆಯಾಗಬಾರದು ಎನ್ನುವ ಕಾರಣಕ್ಕಾಗಿ ಬೆಳಿಗ್ಗೆ 6 ರಿಂದ 10 ಗಂಟೆಯವರೆಗೆ ಅಗತ್ಯ ವಸ್ತುಗಳನ್ನು ಖರೀದಿಸಲು ಅವಕಾಶ ನೀಡಲಾಗಿದ್ದು, ಅನವಶ್ಯಕವಾಗಿ ಯಾರೂ ಓಡಾಡಬಾರದು. ಎಲ್ಲರೂ ಸಾಮಾಜಿಕ ಅಂತರ ಕಾಪಾಡುವುದು, ಸ್ಯಾನಿಟೈಸರ್ ಉಪಯೋಗ, ಮಾಸ್ಕ್ ಧರಿಸುವದು ಸೇರಿದಂತೆ ಕೊರೊನ ನಿಯಮಗಳನ್ನು ಸಾರ್ವಜನಿಕರು ಕಡ್ಡಾಯವಾಗಿ ಪಾಲಿಸಬೇಕು ಎಂದರು.
ಕೋವಿಡ್ 2ನೇ ಅಲೆ ತೀವ್ರವಾಗುತ್ತಿದ್ದು, ನಮ್ಮಲ್ಲಿರುವ ಸಂಪನ್ಮೂಲಗಳನ್ನು ವಿವೇಚನೆಯಿಂದ ಬಳಸಬೇಕಾಗಿದೆ. ಮಹಾರಾಷ್ಟç ಮತ್ತು ಇತರ ರಾಜ್ಯದ ಗಡಿಗಳಿಂದ ಕೋವಿಡ್ ರೋಗಿಗಳು ಬಂದಿದ್ದು, ಅಂತವರೇ ನಮ್ಮ ಆಸ್ಪತ್ರೆಗಳಲ್ಲಿ ತುಂಬಿದ್ದಾರೆ. ರಾಜ್ಯದ ಎಲ್ಲ ಆಸ್ಪತ್ರೆಗಳಲ್ಲಿ ಆಕ್ಸಿಜನ್ ಕೊರತೆಯಾಗದಂತೆ ಜಿಲ್ಲಾಧಿಕಾರಿಗಳು ನೋಡಿಕೊಳ್ಳಬೇಕು. ಮೈಸೂರು, ಬೀದರ್, ಹಾಸನ, ಕಲಬುರಗಿ, ತುಮಕೂರುಗಳಲ್ಲಿ ಕೋವಿಡ್ ಪ್ರಕರಣ ಹೆಚ್ಚಾಗಿವೆ. ಹಾಗಾಗಿ ಎಲ್ಲರೂ ಕೋವಿಡ್ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು. ನರೇಗಾ ಯೋಜನೆಯಡಿ ಹಳ್ಳಿಗಳಲ್ಲಿ ಜನರಿಗೆ ಉದ್ಯೋಗ ಕೊಡಿಸುವುದು ಅವಶ್ಯಕವಾಗಿದ್ದು, ಈ ಕುರಿತು ಜನರಿಗೆ ಮಾಹಿತಿ ನೀಡುವ ಮತ್ತು ಅವರಿಗೆ ಕೆಲಸ ಕೊಡುವ ಕಾರ್ಯವನ್ನು ಪಿಡಿಓ ಗಳು ಮಾಡಬೇಕು ಎಂದು ಹೇಳಿದರು.
ಕೊಪ್ಪಳ ಜಿಲ್ಲಾಡಳಿತ ಭವನದ ಎನ್‌ಐಸಿ ಕೇಂದ್ರದಿAದ ಮುಖ್ಯಮಂತ್ರಿಗಳ ವಿಡಿಯೋ ಸಂವಾದದಲ್ಲಿ ಭಾಗವಹಿಸಿದ್ದ ರಾಜ್ಯ ಕೃಷಿ ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಸಿ ಪಾಟೀಲ್ ಅವರು ಮಾತನಾಡಿ, ಜಿಲ್ಲೆಯಲ್ಲಿ ಯಾವುದೇ ಬೆಡ್‌ಗಳ ಕೊರತೆ ಇಲ್ಲ. ಮುಂಜಾಗ್ರತೆಯಾಗಿ 355 ಬೆಡ್‌ಗಳ ವ್ಯವಸ್ಥೆ ಮಾಡಿಕೊಳ್ಳಲಾಗಿದೆ. ರೆಮಿಡಿಸಿವಿಯರ್ ದಾಸ್ತಾನು ನಮ್ಮಲ್ಲಿ ಸಾಕಷ್ಟು ಇದೆ. ಈಗಾಗಲೇ ಜಿಲ್ಲೆಯಲ್ಲಿ ಶೇ.52 ಪ್ರತಿಶತ ವ್ಯಾಕ್ಸಿನೇಷನ್ ಆಗಿದ್ದು, ಇನ್ನೂ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಲಸಿಕೆ ಹಾಕಿಸಿಕೊಳ್ಳುವಂತೆ ಪ್ರೋತ್ಸಾಹಿಸಲು ಖಾಸಗಿ ಶಾಲೆಗಳ 50 ಬಸ್ಸುಗಳನ್ನು ಹಳ್ಳಿಗಳಿಗೆ ತೆಗೆದುಕೊಂಡು ಹೋಗಿ ವಾಕ್ಸಿನೇಶನ್ ಮಾಡಲಾಗುತ್ತಿದೆ. ಈ ಕುರಿತು ಜಿಲ್ಲಾಡಳಿತಕ್ಕೆ ಕಟ್ಟುನಿಟ್ಟಿನ ನಿರ್ದೇಶನ ನೀಡಿದ್ದೇನೆ ಎಂದು ಜಿಲ್ಲೆಯ ಕುರಿತು ಮಾಹಿತಿ ನೀಡಿದರು.
ಈ ವಿಡಿಯೋ ಸಂವಾದದಲ್ಲಿ ಸಂಸದರಾದ ಸಂಗಣ್ಣ ಕರಡಿ, ಶಾಸಕರಾದ ರಾಘವೇಂದ್ರ ಹಿಟ್ನಾಳ, ಅಮರೇಗೌಡ ಬಯ್ಯಾಪೂರ, ಪರಣ್ಣ ಮುನವಳ್ಳಿ, ಕೊಪ್ಪಳ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ರಶ್ಮಿ ಮಹೇಶ, ಜಿಲ್ಲಾ ಪಂಚಾಯತ ಸಿಇಒ ರಘುನಂದನ್ ಮೂರ್ತಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಟಿ.ಶ್ರೀಧರ, ಅಪರ ಜಿಲ್ಲಾಧಿಕಾರಿ ಎಂ.ಪಿ.ಮಾರುತಿ, ಪ್ರಭಾರಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಯಾಗಿರುವ ಜಿಲ್ಲಾ ಆರ್.ಸಿ.ಎಚ್. ಅಧಿಕಾರಿ ಜಂಬಯ್ಯ ಸೇರಿದಂತೆ ಇತರೆ ಅಧಿಕಾರಿಗಳು ಉಪಸ್ಥಿತರಿದ್ದರು.

Please follow and like us:
error