ಗವಿಮಠ ಕೋವಿಡ್ ಕೇರ್ ಸೆಂಟರ್,ಆಸ್ಪತ್ರೆಗೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಭೇಟಿ

ಕೊಪ್ಪಳ :ಶ್ರೀ ಗವಿಮಠ ಕೋವಿಡ್ ಕೇರ್ ಸೆಂಟರ್ ಹಾಗೂ ಆಸ್ಪತ್ರೆಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸರ್ಕಾರದ ಪ್ರಧಾನ ಕಾರ್ಯದರ್ಶಿಗಳು ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ರಶ್ಮಿ ವಿ. ಮಹೇಶ್ ಅವರು ಇಂದು ಭೇಟಿ ನೀಡಿ ಪರಿಶೀಲಿಸಿ, ರೋಗಿಗಳ ಆರೋಗ್ಯ ವಿಚಾರಿಸಿದರು.
ಜಿಲ್ಲೆಯ ಕೊರೋನಾ ಸೋಂಕಿತರಿಗೆ ಚಿಕಿತ್ಸೆಗೆ ನೆರವಾಗಲು ಕೊಪ್ಪಳ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಶ್ರೀ ಗವಿಸಿದ್ಧೇಶ್ವರ ಆಯುರ್ವೇದ ಮೆಡಿಕಲ್ ಕಾಲೇಜು ಹಾಗೂ ಆಸ್ಪತ್ರೆ ಇವರ ಸಹಯೋಗದಲ್ಲಿ ಶ್ರೀ ಗವಿಮಠದ ಯಾತ್ರಿ ನಿವಾಸದಲ್ಲಿ ನಿರ್ಮಾಣಗೊಂಡ 100 ಆಕ್ಸಿಜನ್ ಬೆಡ್ ಗಳ ಗವಿಮಠ ಕೋವಿಡ್ ಆಸ್ಪತ್ರೆ ಹಾಗೂ ಗವಿಮಠದ ವಸತಿ ನಿಲಯದಲ್ಲಿ ನಿರ್ಮಾಣಗೊಂಡ “ಕೋವಿಡ್ ಕೇರ್ ಸೆಂಟರ್” ಅನ್ನು ಕೊಪ್ಪಳ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳು  ವೀಕ್ಷಣೆ ಮಾಡಿ, ಆಕ್ಸಿಜನ್, ವೆಂಟಿಲೇಟರ್ ಹಾಗೂ ಕೋವಿಡ್ ಚಿಕಿತ್ಸೆ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡರು.
ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ವಿಕಾಸ್ ಕಿಶೋರ್ ಸುರಳ್ಕರ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಘುನಂದನ್ ಮೂರ್ತಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಟಿ.ಲಿಂಗರಾಜು, ತಹಶೀಲ್ದಾರ್ ಅಮರೇಶ ಬಿರಾದಾರ್, ಜಿಲ್ಲಾ ಕ್ಷಯ ನಿರ್ಮೂಲನಾ ಅಧಿಕಾರಿ ಡಾ.ಮಹೇಶ್ ಎಂ.ಜಿ. ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

Please follow and like us:
error