ಎಸ್‌ಸಿಪಿ-ಟಿಎಸ್‌ಪಿ ಯೋಜನೆಯನ್ನು ಫಲಾನುಭವಿಗಳಿಗೆ ಸಮರ್ಪಕವಾಗಿ ತಲುಪಿಸಿ: ವಿಕಾಸ್ ಕಿಶೋರ್ ಸುರಳ್ಕರ್


ಕೊಪ್ಪಳ,  : ಎಲ್ಲಾ ಇಲಾಖೆಗಳು ಎಸ್.ಸಿ.ಪಿ-ಟಿ.ಎಸ್.ಪಿ ಯೋಜನೆಯಡಿ ಅರ್ಹ ಫಲಾನುಭವಿಗಳಿಗೆ ಸರ್ಕಾರದ ಸೌಲಭ್ಯವನ್ನು ಸಮರ್ಪಕವಾಗಿ ತಲುಪಿಸಿ ಎಂದು ಜಿಲ್ಲಾಧಿಕಾರಿ ವಿಕಾಸ್ ಕಿಶೋರ್ ಸುರಳ್ಕರ್ ಹೇಳಿದರು.
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಇಂದು ಸಮಾಜ ಕಲ್ಯಾಣ ಇಲಾಖೆಯಿಂದ ಆಯೋಜಿಸಲಾಗಿದ್ದ ಕರ್ನಾಟಕ ಅನುಸೂಚಿತ ಜಾತಿಗಳ ಉಪಯೋಜನೆ ಮತ್ತು ಬುಡಕಟ್ಟು ಉಪಯೋಜನೆ ಅಧಿನಿಯಮ 2013ರನ್ವಯ ಅನುಸೂಚಿತ ಜಾತಿಗಳು ಉಪಯೋಜನೆ/ಬುಡಕಟ್ಟು ಉಪಯೋಜನೆ ಹಾಗೂ ಪರಿಶಿಷ್ಟ ಜಾತಿ/ವರ್ಗದ ಅಭಿವೃದ್ಧಿ ಕಾರ್ಯಕ್ರಮಗಳ ಆಗಸ್ಟ್ ಮತ್ತು ಸೆಪ್ಟೆಂಬರ್-2020 ರ ಪ್ರಗತಿ ಪರಿಶೀಲನೆಗಾಗಿ ಜಿಲ್ಲಾ ಮೇಲ್ವಿಚಾರಣಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಎಲ್ಲಾ ಇಲಾಖೆ, ನಿಗಮಗಳಿಗೆ ಎಸ್.ಸಿ.ಪಿ-ಟಿ.ಎಸ್.ಪಿ. ಯೋಜನೆಯಡಿ ಪರಿಶಿಷ್ಟ ಜಾತಿ/ವರ್ಗದವರ ಅಭಿವೃದ್ಧಿಗೆ ಸರ್ಕಾರ ಅನುದಾನವನ್ನು ಬಿಡುಗಡೆ ಮಾಡಿ ನಿರ್ದಿಷ್ಟ ಗುರಿಯನ್ನು ನಿಗದಿಪಡಿಸಿರುತ್ತದೆ. ಅದರೊಂದಿಗೆ ಸರ್ಕಾರದ ಯೋಜನೆಗಳಲ್ಲಿ ಫಲಾನುಭವಿಗಳಿಗಾಗಿ ಇರುವ ಯೋಜನೆಗಳನ್ನು ಅರ್ಹರಿಗೆ ತಲುಪಿಸಿ. ಪರಿಶಿಷ್ಟ ಜಾತಿ/ವರ್ಗದ ಫಲಾನುಭವಿಗಳಿಗಾಗಿ ಬೇರೆ ಬೇರೆ ಇಲಾಖೆಗಳಲ್ಲಿ ಇರುವ ಸೌಲಭ್ಯಗಳ ಮಾಹಿತಿಯನ್ನು ಸಂಗ್ರಹಿಸಿ, ಫಲಾನುಭವಿಗಳನ್ನು ಗುರುತಿಸಿ ಅವರಿಗೆ ಯೋಜನೆಯ ಲಾಭ ತಲುಪಿಸಿ. ಇನ್ನುಮುಂದೆ ಎಲ್ಲಾ ಇಲಾಖೆಗಳು ಫಲಾನುಭವಿ ಆಧಾರಿತ ಯೋಜನೆಗಳಿಗೆ ಹೆಚ್ಚಿನ ಆದ್ಯತೆ ನೀಡಿ. ಗ್ರಾಮೀಣ ಮಟ್ಟದಲ್ಲಿ ಯೋಜನೆಗಳ ಕುರಿತು ಜಾಗೃತಿ ಮೂಡಿಸಿ, ಫಲಾನುಭವಿಗಳು ಅರ್ಜಿ ಸಲ್ಲಿಸುವಂತೆ ಕ್ರಮ ವಹಿಸಿ ಎಂದು ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಈಗಾಗಲೇ ಅಲ್ಪಸಂಖ್ಯಾತರ ಮಾಹಿತಿ ಸಂಗ್ರಹಿಸಲು ಸೂಚನೆ ನೀಡಲಾಗಿದೆ. ಅದರಂತೆ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗದ ಮಾಹಿತಿಯನ್ನು ಸಂಗ್ರಹಿಸಿ ಇಲಾಖೆಗಳ ಯೋಜನೆಗಳವಾರು ಹಾಗೂ ಕೆಟಗರಿವಾರು ಮಾಹಿತಿಯನ್ನು ಎಲ್ಲಾ ಇಲಾಖೆಗಳು ನೀಡಬೇಕು. ಸರ್ಕಾರ ನೀಡುವ ಅನುದಾನ ಬಿಡುಗಡೆಯಾದ ದಿನಾಂಕ, ಫಲಾನುಭವಿಗಳಿಗೆ ತಲುಪಿಸಿದ ದಿನಾಂಕ, ಖರ್ಚಾದ ಮೊತ್ತ, ಬಾಕಿ ಉಳಿದಿರುವ ಅನುದಾನವನ್ನು ಕಾರಣ ಸಹಿತ ಮಾಹಿತಿಯನ್ನು ನೀಡಿ. ಎಸ್.ಸಿ.ಪಿ-ಟಿ.ಎಸ್.ಪಿ ಯೋಜನೆಯಡಿ ವಿವಿಧ ಅನುಷ್ಠಾನ ಏಜೆನ್ಸಿಗಳ ಮೂಲಕ ನಿರ್ಮಿಸುತ್ತಿರುವ ವಿವಿಧ ಇಲಾಖೆಗಳ ಕಟ್ಟಡಗಳು, ಭವನಗಳ ಕುರಿತು ಪ್ರತಿ ತಿಂಗಳು ಮಾಹಿತಿ ನೀಡಬೇಕು. ಮೂರು ವರ್ಷಗಳಿಂದ ಬಾಕಿ ಇರುವ ಕಟ್ಟಡ ನಿರ್ಮಾಣ ಕಾಮಗಾರಿಗಳ ಬಗ್ಗೆ ಕಾರಣ ಸಹಿತ ಮಾಹಿತಿಯನ್ನು ನೀಡಿ. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸ್ವಧಾರ, ಸಾಂತ್ವನ ಮುಂತಾದ ಕೇಂದ್ರಗಳಲ್ಲಿ ಸದರಿ ಯೋಜನೆಯಡಿ ಒದಗಿಸಿರುವ ಸೌಲಭ್ಯದ ಕುರಿತು ಅಂಕಿ-ಅAಶಗಳ ಸಹಿತ ಮಾಹಿತಿಯನ್ನು ನೀಡಿ ಎಂದು ಅವರು ಸಂಬAಧಿಸಿದ ಇಲಾಖೆಗಳ ಅಧಿಕಾರಿಗಳಿಗೆ ತಿಳಿಸಿದರು.
ಎಸ್.ಸಿ.ಪಿ-ಟಿ.ಎಸ್.ಪಿ ಯೋಜನೆಯ ಪ್ರಗತಿ ಪರಿಶೀಲನಾ ಸಭೆಗೆ ಪ್ರತಿನಿಧಿಗಳನ್ನು ಕಳುಹಿಸದೆ, ಕಡ್ಡಾಯವಾಗಿ ಇಲಾಖೆಗಳ ಅನುಷ್ಠಾನ ಅಧಿಕಾರಿಗಳು ಬರಬೇಕು. ಸಭೆಗೆ ಗೈರಾದ ಅಧಿಕಾರಿಗಳಿಗೆ ಷೋಕಾಸ್ ನೋಟಿಸ್ ನೀಡಿ. ಮುಂದಿನ ಸಭೆಗೆ ಎಲ್ಲ ಅಧಿಕಾರಿಗಳು ಅಗತ್ಯ ಮಾಹಿತಿಯೊಂದಿಗೆ ಖುದ್ದಾಗಿ ಹಾಜರಾಗುವಂತೆ ತಿಳಿಸಿ ಎಂದು ಅವರು ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕರಿಗೆ ಸೂಚನೆ ನೀಡಿದರು.
ಜಿಲ್ಲಾ ಪಂಚಾಯತನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಘುನಂದನ್ ಮೂರ್ತಿ ಮಾತನಾಡಿ, ಎಲ್ಲಾ ಇಲಾಖೆಗಳು ಎಸ್.ಸಿ.ಪಿ-ಟಿ.ಎಸ್.ಪಿ ಯೋಜನೆಯಡಿ ಫಲಾನುಭವಿ ಆಧಾರಿತ ಯೋಜನೆಗಳ ಕುರಿತು ಸಂಕ್ಷಿಪ್ತವಾಗಿ ಕಾಲಂಗಳಲ್ಲಿ ವಿವರವಾದ ಮಾಹಿತಿಯನ್ನು ಎನ್.ಐ.ಸಿ ಗೆ ನೀಡಬೇಕು. ಆ ಮಾಹಿತಿಯನ್ನು ಜಿಲ್ಲಾ ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗುವುದು. ಇದರಿಂದ ಅರ್ಹ ಫಲಾನುಭವಿಗಳು ಸರ್ಕಾರದ ಯೋಜನೆಯ ಲಾಭ ಪಡೆಯಲು ಅನುಕೂಲವಾಗಲಿದೆ. ಸಮಾಜ ಕಲ್ಯಾಣ ಇಲಾಖೆಯಿಂದ ಭರಿಸುವ ವಿದ್ಯಾರ್ಥಿಗಳ ಶುಲ್ಕ, ಪ್ರೋತ್ಸಾಹಧನ ಮುಂತಾದ ಸೌಲಭ್ಯಗಳನ್ನು ಪರಿಶೀಲಿಸಬೇಕು. ಅದಕ್ಕಾಗಿ ಇಲಾಖೆಯಡಿ ಬರುವ ವಸತಿ ನಿಲಯಗಳ ಮೇಲ್ವಿಚಾರಕರ ತಂಡಗಳನ್ನು ರಚಿಸಿ, ಇಲಾಖೆಯಿಂದ ಭರಿಸಲಾದ ಮೊತ್ತದ ಕುರಿತು ಪರಿಶೀಲನೆಗೆ ಕ್ರಮ ಕೈಗೊಳ್ಳಿ. ವಿವಿಧ ಅನುಷ್ಠಾನ ಏಜೆನ್ಸಿಗಳ ಮೂಲಕ ನಿರ್ಮಾಣಗೊಳ್ಳಬೇಕಿರುವ ಇಲಾಖೆಗಳ ಕಟ್ಟಡ, ಭವನದ ಪ್ರಗತಿ ಕುರಿತು ಪ್ರತಿ ತಿಂಗಳು 5ನೇ ತಾರೀಖಿನೊಳಗೆ ಜಿಲ್ಲಾ ಪಂಚಾಯತಿಗೆ ಪ್ರಗತಿ ವರದಿ ಸಲ್ಲಿಸಬೇಕು. ಸತತ ನಾಲ್ಕರಿಂದ ಐದು ತಿಂಗಳು ಕಾಮಗಾರಿ ಸ್ಥಗಿತಗೊಂಡರೆ ಅದಕ್ಕೆ ಸಂಬAಧಿಸಿದ ಇಲಾಖೆಯನ್ನೇ ನೇರ ಹೊಣೆ ಮಾಡಲಾಗುವುದು. ಆದ್ದರಿಂದ ವಿವಿಧ ಇಲಾಖೆಗಳ ಕಟ್ಟಡಗಳ ಕಾಮಗಾರಿಯನ್ನು ನಿಗದಿತ ಅವಧಿಯಲ್ಲಿ ಪೂರ್ಣಗೊಳಿಸಲು ಇಲಾಖೆ ಅಧಿಕಾರಿಗಳು ಆಗಾಗ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಬೇಕು ಹಾಗೂ ಅನುಷ್ಠಾನ ಏಜೆನ್ಸಿಗಳಿಂದ ಕಾಮಗಾರಿ ಪೂರ್ಣಗೊಳಿಸಬೇಕು. ಗಂಗಾ ಕಲ್ಯಾಣ ಯೋಜನೆಯಡಿ ಫಲಾನುಭವಿಗಳಿಗೆ ಸೌಲಭ್ಯ ಒದಗಿಸಿರುವ ಬಗ್ಗೆ ಆರ್.ಆರ್. ಸಂಖ್ಯೆಯುಳ್ಳ ಮಾಹಿತಿಯನ್ನು ನೀಡಿ ಎಂದು ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಎಂ.ಪಿ.ಮಾರುತಿ, ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಸಿದ್ರಾಮೇಶ್ವರ, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ಲಕ್ಷö್ಮಣ ಬಬಲಿ, ಜಂಟಿ ಕೃಷಿ ನಿರ್ದೇಶಕ ಶಿವಕುಮಾರ, ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕ ಪ್ರಶಾಂತ ಬಾರಿಗಿಡದ, ತೋಟಗಾರಿಕೆ ಉಪನಿರ್ದೇಶಕ ಕೃಷ್ಣ ಉಕ್ಕುಂದ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕಿ ಅಕ್ಕಮಹಾದೇವಿ, ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ದೊಡ್ಡಬಸಪ್ಪ ನೀರಲಕೇರಿ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

Please follow and like us:
error