ತಾಲೂಕು ಮಟ್ಟದಲ್ಲಿಯೂ ಜನಸಂಪರ್ಕ ಸಭೆ- ಸಚಿವ ಬಸವರಾಜ ರಾಯರಡ್ಡಿ

????????????????????????????????????

ಕೊಪ್ಪಳ – ಆ. ೦6 (ಕ ವಾ) :  ಜಿಲ್ಲಾ ಉಸ್ತುವಾರಿ ಸಚಿವರ ಅಧ್ಯಕ್ಷತೆಯಲ್ಲಿ ಜಿಲ್ಲಾ ಮಟ್ಟದಲ್ಲಿ ಕೈಗೊಳ್ಳಲಾಗುತ್ತಿರುವ ಜನಸಂಪರ್ಕ ಸಭೆಯನ್ನು ಬರುವ ದಿನಗಳಲ್ಲಿ ತಾಲೂಕು ಮಟ್ಟದಲ್ಲಿಯೂ ಹಮ್ಮಿಕೊಳ್ಳಲಾಗುವುದು ಎಂದು ಕೊಪ್ಪಳ ಜಿಲ್ಲಾ ಉಸ್ತುವಾರಿ ಮತ್ತು ಉನ್ನತ ಶಿಕ್ಷಣ ಸಚಿವ ಬಸವರಾಜ ರಾಯರಡ್ಡಿ ಅವರು ಘೋಷಿಸಿದರು. ಜಿಲ್ಲಾಡಳಿತ ಭವನದ ಆಡಿಟೋರಿಯಂ ಹಾಲ್‌ನಲ್ಲಿ ಸಾರ್ವಜನಿಕ ಕುಂದುಕೊರತೆಗಳ ಅರ್ಜಿ ವಿಚಾರಣೆ ಮತ್ತು ಅಹವಾಲು ಆಲಿಸುವ ಸಲುವಾಗಿ ಶನಿವಾರದಂದು ಆಯೋಜಿಸಲಾಗಿದ್ದ ಜನಸಂಪರ್ಕ ಸಭೆಯ ಉದ್ಘಾಟನೆ ನೆರವೇರಿಸಿ ಅವರು ಮಾತನಾಡಿದರು.

????????????????????????????????????

reddy1ಸಾರ್ವಜನಿಕರ ಕುಂದುಕೊರತೆಗಳನ್ನು ಸ್ಥಳೀಯ ಮಟ್ಟದಲ್ಲಿಯೇ ಬಗೆಹರಿಸುವ ಸಲುವಾಗಿ ಹಾಗೂ ಜನಸಾಮಾನ್ಯರ ಸಮಸ್ಯೆಗಳಿಗೆ ಸ್ಪಂದಿಸಿ, ಅವರ ಸಮಸ್ಯೆಗಳನ್ನು ಪರಿಹರಿಸುವ ನಿಟ್ಟಿನಲ್ಲಿ ಜಿಲ್ಲಾ ಉಸ್ತುವಾರಿ ಸಚಿವರ ಅಧ್ಯಕ್ಷತೆಯಲ್ಲಿ ಜಿಲ್ಲಾ ಮಟ್ಟದಲ್ಲಿ ಜನಸಂಪರ್ಕ ಸಭೆಯನ್ನು ಆಯೋಜಿಸಲಾಗುತ್ತಿದೆ. ಜನರ ಹಿತದೃಷ್ಟಿಯಿಂದ ಜನಸಂಪರ್ಕ ಸಭೆಯನ್ನು ಮುಂದಿನ ದಿನಗಳಲ್ಲಿ ತಾಲೂಕು ಮಟ್ಟದಲ್ಲಿಯೂ ಹಮ್ಮಿಕೊಳ್ಳಲಾಗುವುದು. ಜನರ ಹಿತಕ್ಕಾಗಿಯೇ ನಮ್ಮ ಸರ್ಕಾರ ಹಲವಾರು ಯೋಜನೆಗಳನ್ನು ಜಾರಿಗೊಳಿಸಿದ್ದು, ಬಡವರಿಗೆ ಅನ್ನಭಾಗ್ಯ ಯೋಜನೆಯಡಿ ಉಚಿತ ಅಕ್ಕಿ ವಿತರಣೆ ಮಾಡಲಾಗುತ್ತಿದೆ. ದುಡಿಯುವ ರೈತರಿಗೆ ೩ ಲಕ್ಷ ರೂ. ವರೆಗೆಗೆ ಬಡ್ಡಿ ರಹಿತವಾಗಿ ಸಾಲ ನೀಡಲಾಗುತ್ತಿದ್ದು, ಇನ್ನು ೦೩ ಲಕ್ಷ ದಿಂದ ೧೦ ಲಕ್ಷ ರೂ. ಗಳವರೆಗಿನ ಸಾಲವನ್ನು ಕೇವಲ ಶೇ. ೩ ರ ಬಡ್ಡಿ ದರದಲ್ಲಿ ನೀಡಲಾಗುತ್ತಿದೆ. ಮಳೆ ಆಶ್ರಿತ ರೈತರು ತಮ್ಮ ಬದುಕನ್ನು ಕಟ್ಟಿಕೊಳ್ಳಲು ಕೃಷಿ ಹೊಂಡ ನಿರ್ಮಾಣ ಮಾಡುವ ಸಲುವಾಗಿ ಕೃಷಿ ಭಾಗ್ಯ ಯೋಜನೆ ಜಾರಿಗೊಳಿಸಿದ್ದು, ಜಿಲ್ಲೆಯಲ್ಲಿ ಯೋಜನೆ ಅತ್ಯಂತ ಯಶಸ್ವಿಯಾಗಿ ಜನಪ್ರಿಯಗೊಂಡಿದೆ. ಮನೆ ರಹಿತ ಕುಟುಂಬಗಳನ್ನು ಗುರುತಿಸಿ, ಅಂತಹ ಕುಟುಂಬಗಳಿಗೆ ಸೂರು ಕಲ್ಪಿಸಲು ನಮ್ಮ ಸರ್ಕಾರ ಮುಂದಾಗಿದ್ದು, ಪ್ರತಿ ವರ್ಷ ೩ ಲಕ್ಷ ಮನೆಗಳ ನಿರ್ಮಾಣದ ಗುರಿ ಹಾಕಿಕೊಳ್ಳಲಾಗಿದೆ. ಗ್ರಾಮೀಣ ಜನರ ಕೆಲಸ ಸುಗಮಗೊಳಿಸುವ ಸಲುವಾಗಿ ಪೋಡಿ ಅಧಿಕಾರವನ್ನು ತಹಸಿಲ್ದಾರರಿಗೆ ನೀಡಲಾಗಿದೆ. ಅಧಿಕಾರಿಗಳು ಕಾನೂನಿನ ಚೌಕಟ್ಟಿನಲ್ಲಿ ಜನಪರ ಕೆಲಸ ಮಾಡಬೇಕು. ಪ್ರಜಾಪ್ರಭುತ್ವದಲ್ಲಿ ಜನರೇ ಸರ್ಕಾರದ ಮಾಲೀಕರು, ಜನರ ಸಮಸ್ಯೆಗಳಿಗೆ ಅಧಿಕಾರ ವರ್ಗ ಸ್ಪಂದಿಸುವ ಕೆಲಸ ಆಗಬೇಕು. ಅಧಿಕಾರಿಗಳು ಕಚೇರಿಗಳಲ್ಲಿ ಕುಳಿತು ಕೆಲಸ ಮಾಡಿದರೆ, ಜನರ ಸಮಸ್ಯೆಗಳು ಅರಿವಿಗೆ ಬರುವುದಿಲ್ಲ. ಈ ನಿಟ್ಟಿನಲ್ಲಿ ಅಧಿಕಾರಿಗಳು ಕ್ಷೇತ್ರಗಳಿಗೆ ಭೇಟಿ ಮಾಡಿ, ಜನರೊಂದಿಗೆ ಬೆರೆತರೆ ಮಾತ್ರ ಜನಸಾಮಾನ್ಯರ ತೊಂದರೆಗಳು ಗೊತ್ತಾಗುತ್ತವೆ. ರೈತರ ಜಮೀನಿನ ಸರ್ವೆ ಕಾರ್ಯದಲ್ಲಿ ಹಣ ಕೊಟ್ಟರೆ ಮಾತ್ರ ಸರ್ವೆ ಮಾಡಿಕೊಡುತ್ತಿರುವುದಾಗಿ ದೂರುಗಳು ವ್ಯಾಪಕವಾಗಿದ್ದು, ಈ ಕುರಿತಂತೆ ನಿರ್ದಿಷ್ಟ ದೂರುಗಳು ಬಂದಲ್ಲಿ, ಅಂತಹವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು. ಸಚಿವರ ಹೆಸರು ಹೇಳಿಕೊಂಡು, ಯಾರೇ ಆಗಲಿ ಹಣ ಕೇಳಿದರೆ ಅಥವಾ ಹೆಸರು ದುರುಪಯೋಗ ಮಾಡಿಕೊಳ್ಳಲು ಬಯಸಿದರೆ, ಅಧಿಕಾರಿಗಳು ಕೂಡಲೆ ನನ್ನ ಗಮನಕ್ಕೆ ತರಬೇಕು. ಸರ್ಕಾರಿ ಆಸ್ಪತ್ರೆಗಳಲ್ಲಿ ಬಡ ರೋಗಿಗಳಿಂದ, ಬಡ ಕುಟುಂಬಗಳಿಂದ ಹಣ ವಸೂಲಿ ಮಾಡುವ ಬಗ್ಗೆಯೂ ವ್ಯಾಪಕ ದೂರುಗಳು ಕೇಳಿ ಬರುತ್ತಿವೆ. ಆರೋಗ್ಯ ಇಲಾಖೆ ಅಧಿಕಾರಿಗಳು ಈ ಬಗ್ಗೆ ಪರಿಶೀಲಿಸಿ, ಕ್ರಮ ಕೈಗೊಳ್ಳದಿದ್ದಲ್ಲಿ, ಅಧಿಕಾರಿಗಳನ್ನೇ ಹೊಣೆಗಾರರನ್ನಾಗಿ ಮಾಡಲಾಗುವುದು. ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಹೀಗೆ ಉನ್ನತ ಅಧಿಕಾರಿಗಳು ಒಳ್ಳೆಯ ಆಡಳಿತ ನೀಡುವ ಮೂಲಕ ಜಿಲ್ಲೆಯನ್ನು ಮಾದರಿ ಜಿಲ್ಲೆಯನ್ನಾಗಿಸಲಿ, ಅದಕ್ಕೆ ಬೇಕಾದ ಎಲ್ಲ ಸಹಕಾರ ನೀಡಲು ಸದಾ ಸಿದ್ಧ. ಭ್ರಷ್ಠಾಚಾರ ನಡೆಸುವ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಎಷ್ಟೇ ಒತ್ತಡ ಬಂದರೂ ಹಿಂಜರಿಯುವುದಿಲ್ಲ ಎಂದು ಜಿಲ್ಲಾ ಉಸ್ತುವಾರಿ ಸಚಿವ ಬಸವರಾಜ ರಾಯರಡ್ಡಿ ಅವರು ಜನಸಂಪರ್ಕ ಸಭೆಯಲ್ಲಿ ಎಚ್ಚರಿಕೆ ನೀಡಿದರು. ಸಭೆಯಲ್ಲಿ ಜಿಲ್ಲಾಧಿಕಾರಿ ಎಂ. ಕನಗವಲ್ಲಿ, ಜಿ.ಪಂ. ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಆರ್. ರಾಮಚಂದ್ರನ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ತ್ಯಾಗರಾಜನ್, ಅಪರ ಜಿಲ್ಲಾಧಿಕಾರಿ ರುದ್ರೇಶ್ ಘಾಳಿಜಿಲ್ಲಾ ಪಂಚಾಯತಿ ಅಧ್ಯಕ್ಷ ಶೇಖರಪ್ಪ ನಾಗರಳ್ಳಿ, ಕೊಪ್ಪಳ ಶಾಸಕ ಕೆ. ರಾಘವೇಂದ್ರ ಹಿಟ್ನಾಳ್, ಜಿ.ಪಂ. ಉಪಾಧ್ಯಕ್ಷೆ ಲಕ್ಷ್ಮಮ್ಮ ನೀರಲೂಟಿ, ತಾ.ಪಂ. ಅಧ್ಯಕ್ಷ ಬಾಲಚಂದ್ರನ್, ಕೊಪ್ಪಳ ನಗರಸಭೆ ಅಧ್ಯಕ್ಷ ಮಹೇಂದ್ರ ಚೋಪ್ರಾ ಉಪಸ್ಥಿತರಿದ್ದರು.

 

 

 

Please follow and like us:
error