ಸರ್ಕಾರದ ಯೋಜನೆಗಳ ಬಗ್ಗೆ ಮಾಹಿತಿ ನೀಡಿ : ವಿಕಾಸ್ ಕಿಶೋರ್ ಸುರಳ್ಕರ್
ಕೊಪ್ಪಳ, : ವಿವಿಧ ಇಲಾಖೆಯ ಅಧಿಕಾರಿಗಳು ತಮ್ಮ ಇಲಾಖೆಯಿಂದ ಸರ್ಕಾರದಿಂದ ಸಿಗುವ ಸೌಲಭ್ಯಗಳ ಬಗ್ಗೆ ಮಾಹಿತಿ ನೀಡಿ, ತಕ್ಷಣ ಅವರ ಸಮಸ್ಯೆಗಳಿಗೆ ಸ್ಪಂಧಿಸಿ ಎಂದು ಜಿಲ್ಲಾಧಿಕಾರಿ ವಿಕಾಸ್ ಕಿಶೋರ್ ಸುರಳ್ಕರ್ ಅವರು ಅಧಿಕಾರಿಗಳಿಗೆ ಸೂಚಿಸಿದರು.
ಅವರು ಶನಿವಾರ ಕೊಪ್ಪಳ ಜಿಲ್ಲೆಯ ಯಲಬುರ್ಗಾ ತಾಲ್ಲೂಕಿನ ಹಿರೇವಡ್ರಕಲ್ಲ ಗ್ರಾಮದಲ್ಲಿ ಹಮ್ಮಿಕೊಂಡಿದ್ದ “ಜಿಲ್ಲಾಧಿಕಾರಿಗಳ ನಡೆ-ಹಳ್ಳಿಗಳ ಕಡೆ’’ ಕಾರ್ಯಕ್ರಮ ಅಂಗವಾಗಿ ಹಿರೇವಡ್ರಕಲ್ಲ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಮಾತನಾಡಿದರು.
ಕೃಷಿ, ತೋಟಗಾರಿಕೆ ಇಲಾಖೆ, ಕಂದಾಯ, ಆರೋಗ್ಯ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಆಹಾರ ಮತ್ತು ನಾಗರಿಕರ ಸರಬರಾಜು ಇಲಾಖೆ ಹಾಗೂ ಇತರೆ ಯಾವುದೇ ಇಲಾಖೆಗಳ ಸಮಸ್ಯೆಗಳಿರಲಿ ಅವುಗಳಿಗೆ ತಕ್ಷಣವೇ ಪರಿಹಾರ ನೀಡಿ, ಇಂದು ಇಲ್ಲಿಯೇ ಪರಿಹಾರ ನೀಡುವ ಉದ್ದೇಶದಿಂದಲೇ ಈ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದರು.
ಈ ಭಾಗದಲ್ಲಿ ಕೃಷಿ, ತೋಟಗಾರಿಕೆಯಲ್ಲಿ ತೊಡಗಿರುವವರಿಗೆ ತಮ್ಮ ಇಲಾಖೆಗಳಿಂದ ಸಿಗಬಹುದಾದ ಸೌಲಭ್ಯಗಳನ್ನು ಕೊಡಿ ಎಂದು ಕೃಷಿ ಹಾಗೂ ತೋಟಗಾರಿಕೆ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ಈ ಗ್ರಾಮಕ್ಕೆ ಬಸ್ಸಿನ ಸೌಲಭ್ಯ ಇಲ್ಲ ಎನ್ನುತ್ತಿದ್ದಾರೆ. ಇಂದೆಯೇ ಬಸ್ ಸೌಲಭ್ಯ ಕಲ್ಪಿಸಬೇಕು ಎಂದು ಸಾರಿಗೆ ಅಧಿಕಾರಿಗಳಿಗೆ ಸೂಚನೆ ನೀಡಿದ ಜಿಲ್ಲಾಧಿಕಾರಿಗಳು, ಯಾವುದೇ ಇಲಾಖೆಗಳ ಅಧಿಕಾರಿಗಳಾಗಿರಲಿ ಇಂದಿನ ಕಾರ್ಯಕ್ರಮದ ಯಶಸ್ವಿಗೆ ಎಲ್ಲರೂ ಶ್ರಮ ವಹಿಸಿ ಕೆಲಸ ಮಾಡಬೇಕು ಎಂದು ಸೂಚಿಸಿದರು.
ಈ ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಘುನಂದನ್ ಮೂರ್ತಿ, ಉಪವಿಭಾಗಾಧಿಕಾರಿ ನಾರಾಯಣರೆಡ್ಡಿ ಕನಕರೆಡ್ಡಿ, ಯಲಬುರ್ಗಾ ತಹಶೀಲ್ದಾರ ಶ್ರೀಶೈಲ್ ತಳವಾರ, ಡಿ.ಎಫ್.ಓ ಹರ್ಷಬಾನು, ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ದೊಡ್ಡಬಸಪ್ಪ ನೀರಲಕೆರೆ, ಜಂಟಿ ಕೃಷಿ ನಿರ್ದೇಶಕ ಶಿವಕುಮಾರ, ತೋಟಗಾರಿಕೆ ಇಲಾಖೆ ಉಪನಿರ್ದೇಶಕ ಕೃಷ್ಣ ಉಕ್ಕುಂದ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಅಲಕಾನಂದ ಮಳಗಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕಿ ಅಕ್ಕಮಹಾದೇವಿ, ಜಿಲ್ಲಾ ಶಸ್ತçಚಿಕಿತ್ಸಕ ಡಾ. ಎಸ್.ಬಿ. ದಾನರೆಡ್ಡಿ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.
ವಿವಿಧ ಇಲಾಖೆಗಳ ಮಳಿಗೆಗಳ ಉದ್ಘಾಟನೆ ;
ಜಿಲ್ಲಾಧಿಕಾರಿಗಳ ನಡೆ-ಹಳ್ಳಿಗಳ ಕಡೆ ಕಾರ್ಯಕ್ರಮದಡಿ ಜಿಲ್ಲಾ ಪಂಚಾಯತ್, ಕಂದಾಯ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಆಹಾರ ಸರಬರಾಜು ಮತ್ತು ನಾಗರಿಕರ ಸೇವಾ ಇಲಾಖೆ, ಆರೋಗ್ಯ ಇಲಾಖೆ, ಪಶುಪಾಲನಾ ಇಲಾಖೆ, ಸಮಾಜ ಕಲ್ಯಾಣ ಇಲಾಖೆ, ಹಿಂದುಳಿದ ವರ್ಗಗಳ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಹಾಗೂ ವಿವಿಧ ಇಲಾಖೆಗಳ ವತಿಯಿಂದ ಆಯೋಜಿಸಲಾದ ಸೇವಾ ಮಳಿಗೆಗಳಿಗಳನ್ನು ಜಿಲ್ಲಾಧಿಕಾರಿ ವಿಕಾಸ್ ಕಿಶೋರ್ ಸುರಳ್ಕರ್ ಅವರು ಉದ್ಘಾಟಿಸಿದರು. ಜಿ.ಪಂ. ಸಿಇಓ ರಘುನಂದನ್ ಮೂರ್ತಿ ಇದ್ದರು.
ಬಳಿಕ ವಿವಿಧ ಇಲಾಖೆಗಳ ಮಳಿಗೆಗಳಿಗೆ ಭೇಟಿ ನೀಡಿದ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ, ಜನರಿಗೆ ಸರ್ಕಾರದ ವತಿಯಿಂದ ನೀಡುವ ಸೌಲಭ್ಯಗಳು ವಿವಿಧ ಇಲಾಖೆಗಳ ಮಾಹಿತಿ ಮತ್ತು ತಕ್ಷಣವೇ ಪರಿಹಾರ ಒದಗಿಸುವ ಕಾರ್ಯವನ್ನು ಪರಿಶೀಲಿಸಿದರು.
ರಾಯಚೂರು, ಬಳ್ಳಾರಿ ಮತ್ತು ಕೊಪ್ಪಳ ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ ನಿ. ಬಳ್ಳಾರಿ ಹಾಗೂ ಯಲಬುರ್ಗಾ ತಾಲ್ಲೂಕಾಡಳಿತ ಇವರ ಸಹಯೋಗದಲ್ಲಿ ನಿಯೋಜಿತ ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘದ ರಚನೆಗೆ ಷೇರು ಸಂಗ್ರಹಣೆಗೆ ಜಿಲ್ಲಾಧಿಕಾರಿಗಳು ಚಾಲನೆ ನೀಡಿದರು.
