ವಸತಿ ನಿರ್ಮಾಣ ಕಾರ್ಯ ಪ್ರಗತಿಗೆ ಸೂಚನೆ : ವಿ. ಸೋಮಣ್ಣ

ಚಾಮರಾಜನಗರ, ವಸತಿ ಇಲಾಖೆಯ ವಿವಿಧ ಯೋಜನೆಗಳಡಿ ಪಟ್ಟಣ ಹಾಗೂ ಗ್ರಾಮಾಂತರ ಪ್ರದೇಶಗಳಲ್ಲಿ ಮನೆ ನಿರ್ಮಾಣ ಕಾರ್ಯ ಪ್ರಗತಿ ಕಾರ್ಯವನ್ನು ತೀವ್ರಗೊಳಿಸುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ವಸತಿ ಸಚಿವರಾದ ವಿ. ಸೋಮಣ್ಣ ಅವರು ಹೇಳಿದರು.

ನಗರದ ಜಿಲ್ಲಾಡಳಿತ ಭವನದ ಕೆ.ಡಿ.ಪಿ ಸಭಾಂಗಣದಲ್ಲಿ ಇಂದು ವಸತಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯ ಬಳಿಕ ಪತ್ರಿಕಾ ಗೋಷ್ಟಿಯಲ್ಲಿ ಅವರು ಈ ವಿಷಯ ತಿಳಿಸಿದರು.

ಪ್ರಧಾನ ಮಂತ್ರಿ ಆವಾಸ್ ಯೋಜನೆ, ಡಾ. ಬಿ.ಆರ್ ಅಂಬೇಡ್ಕರ್ ವಸತಿ ಯೋಜನೆ, ಬಸವ ವಸತಿ ಯೋಜನೆ ಸೇರಿದಂತೆ ನಾನಾ ಮನೆ ನಿರ್ಮಾಣ ಯೋಜನೆಗಳನ್ನು ಅನುಷ್ಟಾನ ಮಾಡಲಾಗುತ್ತಿದೆ. ಅರ್ಹರಿಗೆ ಯೋಜನೆಗಳ ಪ್ರಯೋಜನಾ ತಲುಪಬೇಕು. ಈ ನಿಟ್ಟಿನಲ್ಲಿ ಅಧಿಕಾರಿಗಳು 15 ರಿಂದ 20 ದಿನಗಳ ಒಳಗೆ ಪ್ರಗತಿ ಕಾರ್ಯ ನಿರ್ವಹಿಸುವಂತೆ ನಿರ್ದೇಶನ ನೀಡಲಾಗಿದೆ ಎಂದು ಸಚಿವರು ತಿಳಿಸಿದರು.

ಕರ್ನಾಟಕ ಗೃಹ ಮಂಡಳಿ ವತಿಯಿಂದ ಬೃಹತ್ ವಸತಿ ಸಂಕೀರ್ಣವನ್ನು ಜಿಲ್ಲೆಯಲ್ಲಿ ನಿರ್ಮಾಣ ಮಾಡಲಾಗುತ್ತಿದೆ. ಇದಕ್ಕೆ ಅಗತ್ಯ ವಿರುವ ಭೂಮಿಯನ್ನು ಗುರುತಿಸುವಂತೆ ಸೂಚಿಸಲಾಗಿದೆ, ಏಕ ಗವಾಕ್ಷಿ ಸಮಿತಿಯನ್ನು ಯೋಜನೆ ಪರಿಶೀಲನೆಗೆ ಕಳುಹಿಸಿ ಕೊಡಲಾಗುವುದು. 100 ಜಮೀನು ಪ್ರದೇಶದಲ್ಲಿ ಬಡಾವಣೆ ನಿರ್ಮಿಸಲಾಗುವುದು ಎಂದರು.

ನಗರ ಪ್ರದೇಶ, ಸ್ಥಳೀಯ ಸಂಸ್ಥೆ ವ್ಯಾಪ್ತಿಯಲ್ಲಿ ಭೂ ಲಭ್ಯತೆ ಅನುಗುಣವಾಗಿ ವಸತಿ ನಿರ್ಮಾಣ ಕಾರ್ಯ ಕೈಗೊಳ್ಳಲಾಗುವುದು. ಹಾಡಿ, ಅರಣ್ಯ ಪ್ರದೇಶಗಳ ಜನತೆಗೆ ಮನೆ ನಿರ್ಮಾಣ ಮಾಡುವ ಕಾರ್ಯಕ್ಕೆ ಒತ್ತು ನೀಡಲಾಗುವುದು ಎಂದು ಸಚಿವರು ತಿಳಿಸಿದರು.

ಮುಖ್ಯಮಂತ್ರಿಯವರ ಸೂಚನೆಯಂತೆ ಧ್ವನಿ ಇಲ್ಲದವರು, ನಿರ್ಗತಿಕರ ನೆರವಿಗೆ ಮುಂದಾಗಿದ್ದು, ರಾಜ್ಯದಲ್ಲಿ 10 ಲಕ್ಷ ಮನೆಗಳನ್ನು ನಿರ್ಮಾಣ ಮಾಡುವ ಯೋಜನೆಗೆ ಮುಂದಾಗಿದ್ದೇವೆ ಎಂದು ಸಚಿವರು ತಿಳಿಸಿದರು.

ಶಾಸಕರಾದ ಸಿ. ಪುಟ್ಟರಂಗ ಶೆಟ್ಟಿ, ಆರ್ ನರೇಂದ್ರ, ಸಿ.ಎಸ್ ನಿರಂಜನ್ ಕುಮಾರ್, ಆರ್. ಧರ್ಮಸೇನ, ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ಎಂ. ಅಶ್ವಿನಿ, ಉಪಾಧ್ಯಕ್ಷರಾದ ಶಶಿಕಲಾ, ಜಿಲ್ಲಾಧಿಕಾರಿ ಡಾ. ಎಂ.ಆರ್ ರವಿ, ಜಿಲ್ಲಾ ಪಂಚಾಯತ್ ಮುಖ್ಯಕಾರ್ಯನಿರ್ವಾಹಕ ಅಧಿಕಾರಿ ಹರ್ಷಲ್ ಭೋಯರ್ ನಾರಾಯಣ್ ರಾವ್ ಸುದ್ದಿಗೋಷ್ಟಿಯಲ್ಲಿ ಹಾಜರಿದ್ದರು.

Please follow and like us: