ಜಿಲ್ಲಾಡಳಿತದ ವತಿಯಿಂದ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸಲಾಗುವುದು : ಎಂ.ಪಿ.ಮಾರುತಿ

ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ ಅಂಗವಾಗಿ ಪೂರ್ವಭಾವಿ ಸಭೆ

ಜಿಲ್ಲಾಡಳಿತದ ವತಿಯಿಂದ ಅಕ್ಟೋಬರ್ 20 ರಂದು ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸಲಾಗುವುದು ಎಂದು ಅಪರ ಜಿಲ್ಲಾಧಿಕಾರಿ ಎಂ.ಪಿ.ಮಾರುತಿ ಹೇಳಿದರು.
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಗುರುವಾರದಂದು(ಅ.07) ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಆಯೋಜಿಸಲಾಗಿದ್ದ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ ಅಂಗವಾಗಿ ಆಯೋಜಿಸಲಾಗಿದ್ದ ಪೂರ್ವಭಾವಿ ಸಭೆಯನ್ನು ಉದ್ದೇಶಿಸಿ ಅವರು ಮಾತನಾಡಿದರು.
ರಾಜ್ಯದಲ್ಲಿ ಪ್ರವಾಹ ಹಾಗೂ ಕೋವಿಡ್-19 ಕಾರಣಗಳಿಂದ ಕಳೆದ ಎರಡು ವರ್ಷಗಳಿಂದ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿಯನ್ನು ಸರ್ಕಾರದ ಮಾರ್ಗಸೂಚಿಯನ್ವಯ ಸರಳ ಹಾಗೂ ಸಾಂಕೇತಿಕವಾಗಿ ಆಚರಿಸಲಾಗಿತ್ತು. ಪ್ರಸಕ್ತ ಸಾಲಿನ ಜಯಂತಿ ಆಚರಣೆಯಲ್ಲಿ ವೇದಿಕೆ ಕಾರ್ಯಕ್ರಮಕ್ಕೆ ಅವಕಾಶ ನೀಡಲಾಗಿದೆ. ಹಾಗೂ ಸಮುದಾಯದವರ ಬೇಡಿಕೆ ಅನುಸಾರ ಈ ಬಾರಿಯ ಜಯಂತಿ ಆಚರಣೆಯನ್ನು ಕೋವಿಡ್ ಮಾರ್ಗಸೂಚಿಯನ್ವಯ ಮೆರವಣಿಗೆ ಹಾಗೂ ವೇದಿಕೆ ಕಾರ್ಯಕ್ರಮದ ಮೂಲಕ ಜಿಲ್ಲಾಡಳಿತದ ವತಿಯಿಂದ ಅರ್ಥಪೂರ್ಣವಾಗಿ ಆಚರಿಸಲಾಗುವುದು. ಮೆರವಣಿಗೆ ಹಾಗೂ ವೇದಿಕೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವವರು ಕಡ್ಡಾಯವಾಗಿ ಮಾಸ್ಕ್ ಧರಿಸಿ ಭಾಗವಹಿಸಬೇಕು ಎಂದು ಅವರು ಹೇಳಿದರು.
ಅ.20 ರಂದು ಬೆಳಿಗ್ಗೆ 08.30 ಗಂಟೆಗೆ ನಗರದ ಶಿರಸಪ್ಪಯ್ಯನ ಮಠದಿಂದ ವಿವಿಧ ಕಲಾ ತಂಡಗಳು ನಗರದ ಸಾಹಿತ್ಯ ಭವನದವರೆಗೆ ಮೆರವಣಿಗೆ ನಡೆಯಲಿದೆ. ನಂತರ ಬೆಳಿಗ್ಗೆ 10 ಗಂಟೆಗೆ ನಗರದ ಸಾಹಿತ್ಯ ಭವನದಲ್ಲಿ ವೇದಿಕೆ ಕಾರ್ಯಕ್ರಮ ಆರಂಭವಾಗುತ್ತದೆ. ಕಾರ್ಯಕ್ರಮದಲ್ಲಿ ವಿಶೇಷ ಉಪನ್ಯಾಸ, ಉತ್ತಮ ಅಂಕ ಪಡೆದ ಸಮುದಾಯದ ವಿದ್ಯಾರ್ಥಿಗಳಿಗೆ ಸನ್ಮಾನ ಕಾರ್ಯಕ್ರಮಗಳು ನಡೆಯಲಿವೆ. ಜಯಂತಿ ಆಚರಣೆಗೆ ಸಂಬAಧಿಸಿದAತೆ ಎಲ್ಲ ಇಲಾಖೆಗಳು ಪರಸ್ಪರ ಸಮನ್ವಯತೆಯಿಂದ ಅಚ್ಚುಕಟ್ಟು ವ್ಯವಸ್ಥೆ ಮಾಡಬೇಕು ಎಂದು ಅವರು ತಿಳಿಸಿದರು.
ಸಭೆಯಲ್ಲಿ ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಗಂಗಪ್ಪ, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕರಾದ ನವೀನ್ ಶಿಂತ್ರೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕಿ ಅಕ್ಕಮಹಾದೇವಿ, ಪೊಲೀಸ್ ಇಲಾಖೆಯ ರವಿ ಉಕ್ಕುಂದ ಸೇರಿದಂತೆ ಸಮುದಾಯದ ಮುಖಂಡರಾದ ಸುರೇಶ ಡೊಣ್ಣಿ, ಗೀತಾ ಜಿ.ಎಂ., ಗವಿಸಿದ್ದಪ್ಪ ಕಲ್ಲನವರ, ಮಂಜುನಾಥ ಗೊಂಡಬಾಳ, ಮುಂತಾದವರು ಉಪಸ್ಥಿತರಿದ್ದರು.

Please follow and like us: