ಪಿಯುಸಿ ಪರೀಕ್ಷಾ ವೇಳಾಪಟ್ಟಿ ಪ್ರಕಟ: ಏ.16ರಿಂದ ಮೇ 4 ರವರೆಗೆ ಪರೀಕ್ಷೆ!

2021-22ನೇ ಸಾಲಿನ ಪ್ರಥಮ ಹಾಗೂ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ, ಪ್ರಾಯೋಗಿಕ ಪರೀಕ್ಷೆ ಮತ್ತು ಪೂರ್ವ ಸಿದ್ಧತಾ ಪರೀಕ್ಷೆಯ ತಾತ್ಕಾಲಿಕ ವೇಳಾಪಟ್ಟಿಯನ್ನು ಪಿಯು ಶಿಕ್ಷಣ ಇಲಾಖೆ ಪ್ರಕಟಿಸಿದೆ.

ಏ.16ರಿಂದ ಮೇ 4ರ ವರೆಗೆ ಬೆಳಗ್ಗೆ 10.15ರಿಂದ ಮಧ್ಯಾಹ್ನ 1.30ರ ವರೆಗೆ ದ್ವಿತೀಯ ಪಿಯುಸಿ ಪರೀಕ್ಷೆ ನಡೆಸಲು ಪಿಯು ಬೋರ್ಡ್‌ ನಿರ್ಧಿರಿಸಿದೆ.

ಪಿಯು ಪರೀಕ್ಷೆ ನಡೆಸುತ್ತಿರುವ ಬಗ್ಗೆ ವಿದ್ಯಾರ್ಥಿಗಳು ಹಾಗೂ ಪೋಷಕರು ಫೆ.1ರ ವರೆಗೆ ಆಕ್ಷೇಪಣೆಗಳನ್ನು ಸಲ್ಲಿಸಲು ಅವಕಾಶ ನೀಡಲಾಗಿದೆ. ಆಕ್ಷೇಪಣೆಗಳನ್ನು jdexam.dpue@gmail.com ಇ-ಮೇಲ್‌ಗೆ ಕಳುಹಿಸಬಹುದು ಎಂದು ಪಿಯು ಶಿಕ್ಷಣ ಇಲಾಖೆ ತಿಳಿಸಿದೆ.

ಅದೇ ರೀತಿ ದ್ವಿತೀಯ ಪಿಯು ಪೂರ್ವ ಸಿದ್ಧತಾ ಪರೀಕ್ಷೆಯನ್ನು ಮಾ.14ರಿಂದ 25ರ ವರೆಗೆ ನಡೆಸಲಾಗುವುದು. ಜಿಲ್ಲಾ ಉಪ ನಿರ್ದೇಶಕರ ನೇತೃತ್ವದಲ್ಲಿ ಪ್ರಶ್ನೆಪತ್ರಿಕೆಗಳನ್ನು ಸಿದ್ಧಪಡಿಸಿ, ಪರೀಕ್ಷೆ ನಡೆಸಬೇಕು ಎಂದು ಇಲಾಖೆ ಸೂಚಿಸಿದೆ.



ಫೆ.17ರಿಂದ ಮಾ.25ರ ವರೆಗೆ ದ್ವಿತೀಯ ಪಿಯು ಪ್ರಾಯೋಗಿಕ ಪರೀಕ್ಷೆ ನಡೆಸಲಾಗುವುದು ಎಂದು ಇಲಾಖೆ ಪ್ರಕಟಿಸಿದೆ.

ಪ್ರಥಮ ಪಿಯು ವಾರ್ಷಿಕ ಪರೀಕ್ಷೆ: ಮಾ.28ರಿಂದ ಏ.13ರ ವರೆಗೆ ಪ್ರಥಮ ಪಿಯು ವಾರ್ಷಿಕ ಪರೀಕ್ಷೆ ನಡೆಸುವಂತೆ ಪಿಯು ಇಲಾಖೆ ನಿರ್ದೇಶಕಿ ಆರ್‌.ಸ್ನೇಹಲ್‌ ಆದೇಶಿಸಿದ್ದಾರೆ.

ಕೊರೊನಾ ಸಾಂಕ್ರಾಮಿಕ ರೋಗದ ಹಿನ್ನೆಲೆಯಲ್ಲಿ ಹಾಗೂ ವಿದ್ಯಾರ್ಥಿಗಳು ದ್ವಿತೀಯ ಪಿಯುಸಿ ನಂತರ ವಿವಿಧ ವೃತ್ತಿಪರ ಕೋರ್ಸುಗಳ ದಾಖಲಾಗಿ ತಮ್ಮ ಭವಿಷ್ಯವನ್ನು ರೂಪಿಸಿಕೊಳ್ಳುವ ಹಿತದೃಷ್ಟಿಯಿಂದ ಪಠ್ಯಕ್ರಮದಲ್ಲಿ ಬದಲಾವಣೆ ಮಾಡಲಾಗಿತ್ತು. ಅದರಂತೆಯೇ ಜಿಲ್ಲಾ ಉಪ ನಿರ್ದೇಶಕರ ನೇತೃತ್ವದಲ್ಲಿಯೇ ಪ್ರಶ್ನೆಪತ್ರಿಕೆಗಳನ್ನು ಸಿದ್ಧಪಡಿಸಿ, ಪರೀಕ್ಷೆ ನಡೆಸಲಾಗುತ್ತಿದೆ.



2021-22ನೇ ಸಾಲಿನಲ್ಲಿ ಭಾಷಾ ವಿಷಯದಲ್ಲಿ ಕಡಿತಗೊಳಿಸಿರುವ ಶೇ.30ರಷ್ಟು ಪಠ್ಯಕ್ರಮವನ್ನು ಹೊರತುಪಡಿಸಿ ಉಳಿದ ಶೇ.70ರಷ್ಟು ಪಠ್ಯಕ್ರಮಕ್ಕೆ ಮಾತ್ರ ಪರೀಕ್ಷೆ ನಡೆಸಲಾಗುತ್ತಿದೆ ಎಂದು ಪಿಯು ಇಲಾಖೆ ಸ್ಪಷ್ಟಪಡಿಸಿದೆ.
ಆದರೆ, ಐಚ್ಛಿಕ ವಿಷಯಗಳ ಪಠ್ಯಕ್ರಮದಲ್ಲಿ ಯಾವುದೇ ಕಡಿತವಿಲ್ಲದೆ ಶೇ.100ರಷ್ಟು ಪಠ್ಯಕ್ರಮಕ್ಕೆ ಪರೀಕ್ಷೆಗಳನ್ನು ನಡೆಸಲಾಗುತ್ತಿದೆ. ಐಚ್ಛಿಕ ವಿಷಯಗಳಲ್ಲಿ ಪ್ರಶ್ನೆಪತ್ರಿಕೆ ತಯಾರಿಸುವ ವೇಳೆ ಹೆಚ್ಚು ಸಂಖ್ಯೆಯಲ್ಲಿ ಆಯ್ಕೆ ಪ್ರಶ್ನೆಗಳನ್ನು ನೀಡಿ ವಿದ್ಯಾರ್ಥಿಗಳು ತಮಗೆ ತಿಳಿದಿರುವ ಪ್ರಶ್ನೆಗಳನ್ನು ಆರಿಸಿಕೊಂಡು ಉತ್ತರಿಸುವ ಅವಕಾಶ ಕಲ್ಪಿಸಲಾಗುತ್ತದೆ ಎಂದು ತಿಳಿಸಿದೆ.

ಮಾ.28ರಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ: ಕೊರೊನಾ ಸಾಂಕ್ರಾಮಿಕದಿಂದ ಶೈಕ್ಷಣಿಕ ವರ್ಷದಲ್ಲಿ ಏರುಪೇರಾಗಿರುವ ಹಿನ್ನೆಲೆಯಲ್ಲಿ ಈ ಬಾರಿ ಪರೀಕ್ಷಾ ವೇಳಾಪಟ್ಟಿ ಹಿಂದೆ- ಮುಂದೆಯಾಗಿವೆ. ಈ ಪ್ರಕಾರ ಮಾ.28ರಿಂದ ಏ.11ರ ವರೆಗೆ ಎಸ್ಸೆಸ್ಸೆಲ್ಸಿ ಪರೀಕ್ಷೆ ನಡೆಸುವುದಾಗಿ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿ ವೇಳಾಪಟ್ಟಿ ಪ್ರಕಟಿಸಿದ್ದು, ಬಳಿಕ ದ್ವಿತೀಯ ಪಿಯುಸಿ ಪರೀಕ್ಷೆ ನಡೆಯಲಿದೆ.