ಕಲಬೆರಕೆ ಆಹಾರ ಪದಾರ್ಥ ಮಾರಾಟಗಾರರ ವಿರುದ್ಧ ಅಧಿಕಾರಿಗಳು ಕ್ರಮಕೈಗೊಳ್ಳಿ: ಆನಂದ್ ಸಿಂಗ್


ಕೊಪ್ಪಳ, ): ಆಹಾರ ನಿರೀಕ್ಷಕರು ಕಲಬೆರಕೆ ಆಹಾರ ಪದಾರ್ಥಗಳನ್ನು ಮಾರಾಟ ಮಾಡುವ ವ್ಯಾಪಾರಿಗಳ ವಿರುದ್ಧ ಕ್ರಮ ತಗೆದುಕೊಳ್ಳಬೇಕು ಎಂದು ಪ್ರವಾಸೋದ್ಯಮ, ಪರಿಸರ ಮತ್ತು ಜೀವಿಶಾಸ್ತ್ರ ಸಚಿವರು ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವರಾದ ಆನಂದ್ ಸಿಂಗ್ ಅವರು ಹೇಳಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ 75ನೇ ವರ್ಷದ ಸ್ವಾತಂತ್ರ್ಯದ ಅಮೃತ ಮಹೋತ್ಸವದ ಅಂಗವಾಗಿ ಮಂಗಳವಾರದಂದು (ಏ.19) ಜಿಲ್ಲಾಸ್ಪತ್ರೆ ಆವರಣದಲ್ಲಿ ಆಯೋಜಿಸಲಾಗಿದ್ದ ಕೊಪ್ಪಳ ತಾಲ್ಲೂಕು ಮಟ್ಟದ ಆರೋಗ್ಯ ಮೇಳವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಆರೋಗ್ಯವೇ ಮಹಾಭಾಗ್ಯ ಎಂಬ ನಾಣ್ಣುಡಿಯು ಪ್ರಸ್ತುತ ದಿನಗಳಲ್ಲಿ ಹೆಚ್ಚಿನ ಪ್ರಾಮುಖ್ಯತೆ ಪಡೆದಿದೆ. ಉತ್ತಮ ಆರೋಗ್ಯದಿಂದ ಉತ್ತಮ ಜೀವನ ಸಾಧ್ಯ. ಸ್ವಾತಂತ್ರ್ಯ ಬಂದು 75 ವರ್ಷ ಕಳೆದರೂ ಶ್ರೀಸಾಮಾನ್ಯರಿಗೆ ಸರಿಯಾದ ಆರೋಗ್ಯ ಸೇವೆಗಳು ಸಿಗುತ್ತಿಲ್ಲ. ಇದೊಂದು ಶೋಚನೀಯ ವಿಷಯವಾಗಿದೆ. ಭಾರತವು ಶೈಕ್ಷಣಿವಾಗಿ, ಆರ್ಥಿಕವಾಗಿ ಅಭಿವೃದ್ಧಿ ಹೊಂದುತ್ತಿದ್ದು, ಅದರಂತೆ ಆರೋಗ್ಯ ಸೂಚ್ಯಂಕದಲ್ಲಿಯೂ ಅಭಿವೃದ್ಧಿ ಹೊಂದುತ್ತಿರುವುದು ಹೆಮ್ಮೆಯ ಸಂಗತಿ. ಉದಾಹರಣೆಗೆ ಕೋವಿಡ್ ಕಷ್ಟ ಕಾಲದಲ್ಲಿ ಜಗತ್ತಿಗೆ ಕೋವಿಡ್ ವ್ಯಾಕ್ಸಿನ್ ವಿತರಣೆ ಮಾಡಿ ಭಾರತ ವಿಶ್ವದ ಪ್ರಶಂಸೆಗೆ ಪಾತ್ರವಾಗಿದೆ. ನಿರ್ದಿಷ್ಟ ವಯೋಮಾನದವರ ನಂತರ ಈಗ ಶಾಲಾ ವಿದ್ಯಾರ್ಥಿಗಳಿಗೂ ಲಸಿಕೆಯನ್ನು ನೀಡಲಾಗುತ್ತಿದೆ. ಹೆಚ್ಚಿನ ಸಂಖ್ಯೆಯಲ್ಲಿ ಎರಡು ಡೋಸ್ ಲಸಿಕೆ ನೀಡುವಲ್ಲಿ ಕೊಪ್ಪಳ ಜಿಲ್ಲೆ ಮುಂದಿದೆ ಎಂದು ಅವರು ಹೇಳಿದರು.
ಪ್ರಸ್ತುತ ದಿನಗಳಲ್ಲಿ ಮಾರುಕಟ್ಟೆಯ ಆಹಾರ ಪದಾರ್ಥಗಳಲ್ಲಿ ಕೃತಕ ಬಣ್ಣ, ರಾಸಾಯನಿಕಗಳನ್ನು ಕಲಬೆರಕೆ ಮಾಡಿ ಮಾರಾಟ ಮಡುವವರ ಹಾವಳಿ ಹೆಚ್ಚಾಗಿದೆ. ಇದನ್ನು ಸೇವಿಸುವ ಜನರು ಕ್ಯಾನ್ಸರ್, ಕಿಡ್ನಿ, ಲಿವರ್, ಹೃದಯ ಸಂಬಂಧಿತ ಕಾಯಿಲೆಗಳಿಂದ ಅನಾರೋಗ್ಯಕ್ಕೆ ತುತ್ತಾಗುತ್ತಿದ್ದಾರೆ. ಆದ್ದರಿಂದ ಅಧಿಕಾರಿಗಳು ಹೆಚ್ಚಿನ ಮುತುವರ್ಜಿ ವಹಿಸಿ ಕಡ್ಡಾಯವಾಗಿ ಆಹಾರ ಮಾರಾಟ ಮಳಿಗೆಗಳಿಗೆ ಭೇಟಿ ನೀಡಿ, ಆಹಾರ ಪದಾರ್ಥಗಳ ಗುಣಮಟ್ಟವನ್ನು ಪರಿಶೀಲಿಸಬೇಕು. ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಸಂಸದ ಸಂಗಣ್ಣ ಕರಡಿ ಅವರು ಮಾತನಾಡಿ, ಈ ಕಾರ್ಯಕ್ರಮವು ಆರೋಗ್ಯದ ಬಗ್ಗೆ ಅರಿವು ಮೂಡಿಸುವ ಕಾರ್ಯಕ್ರಮವಾಗಿದೆ. ಭಾರತ ಹೆಚ್ಚಿನ ಜನಸಂಖ್ಯೆ ಹೊಂದಿದ ದೇಶವಾಗಿದ್ದು, ಕೋವಿಡ್ ಸಂದರ್ಭದಲ್ಲಿ ಪ್ರಧಾನಿ ಅವರ ನಾಯಕತ್ವದಲ್ಲಿ ಅಚ್ಚುಕಟ್ಟಿನ ಯೋಜನೆಗಳನ್ನು ರೂಪಿಸಿ 130 ಕೋಟಿ ಜನರಿಗೆ ಕೋವಿಡ್ ಲಸಿಕೆಯನ್ನು ಯಶಸ್ವಿಯಾಗಿ ನೀಡಲಾಗಿದೆ. ಅದಕ್ಕಾಗಿ ಲಸಿಕೆ ಕಂಡುಹಿಡಿದ ಸಂಶೋಧಕರಿಗೆ, ಲಸಿಕೆಯನ್ನು ಜನರವರೆಗೂ ತಲುಪಿಸಿದ ಆಶಾ ಕಾರ್ಯಕರ್ತೆಯರಿಗೆ, ವೈದ್ಯರಿಗೆ, ಅಂಗನವಾಡಿ ಕಾರ್ಯಕರ್ತೆಯರಿಗೆ, ಕೋವಿಡ್ ಸಂಕಷ್ಟವನ್ನು ಸಮರ್ಥವಾಗಿ ನಿರ್ವಹಿಸಿದ ಅಧಿಕಾರಿಗಳಿಗೆ, ಪೌರ ಕಾರ್ಮಿಕರಿಗೆ ಅಭಿನಂದನೆಗಳನ್ನು ಸಲ್ಲಿಸಬೇಕು. ಗಾಂಧೀಜಿಯವರ ಸ್ವಚ್ಛ ಭಾರತ ಕನಸನ್ನು ನನಸಾಗಿಸಲು ಕೇಂದ್ರ ಸರ್ಕಾರ ಬಯಲು ಬಹಿರ್ದೆಸೆ ನಿರ್ಮೂಲನೆ, ವೈಯಕ್ತಿಕ ಶೌಚಾಲಯ ನಿರ್ಮಾಣ ಮುಂತಾದ ಕ್ರಮಗಳಿಂದ ಪರೋಕ್ಷವಾಗಿ ಜನರ ಆರೋಗ್ಯ ಕಾಪಾಡಲು ಕ್ರಮ ಕೈಗೊಳ್ಳಲಾಗಿದೆ ಎಂದು ಅವರು ಹೇಳಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಶಾಸಕ ಕೆ. ರಾಘವೇಂದ್ರ ಹಿಟ್ನಾಳ್ ಅವರು ಮಾತನಾಡಿ, ಕೋವಿಡ್ ನಂತರದ ಕಾಲದಲ್ಲಿ ಆರೋಗ್ಯ ಮೇಳದಂತ ಕಾರ್ಯಕ್ರಮಗಳು ನಡೆಯುವುದು ಉತ್ತಮ ಬೆಳವಣಿಗೆಯಾಗಿದ್ದು, ಈ ರೀತಿಯ ಕಾರ್ಯಕ್ರಮಗಳು ಜಿಲ್ಲೆಯಲ್ಲಿ ಇನ್ನಷ್ಟು ನಡೆಯಲಿ. ಪ್ರತಿಯೊಬ್ಬರಿಗೂ ಆರೋಗ್ಯ ಸೇವೆಗಳು ದೊರಕುವಂತಾಗಬೇಕು. ಇದರಿಂದ ಬಡವರಿಗೆ ಹೆಚ್ಚು ಅನುಕೂಲವಾಗಲಿದೆ. ಆರೋಗ್ಯ ಮೇಳದ ಬಗೆಗಿನ ಮಾಹಿತಿಯನ್ನು ಸಾಮಾನ್ಯ ಜನರಿಗೂ ತಿಳಿಸುವುದರಿಂದ ಇಂತಹ ಕಾರ್ಯಕ್ರಮಗಳು ಯಶಸ್ವಿಯಾಗುತ್ತವೆ. ಮೇಳದಲ್ಲಿ ಸಾರ್ವಜನಿಕರ ಆರೋಗ್ಯ ತಪಾಸಣೆ ಮಾಡಿ, ಸೂಕ್ತ ಚಿಕಿತ್ಸೆ ನೀಡಬೇಕು. ಇಂತಹ ಮೇಳಗಳು ಪ್ರತಿ ಮೂರು ತಿಂಗಳಿಗೊಮ್ಮೆ ನಡೆಯಬೇಕು. ಇದರಿಂದ ಆರೋಗ್ಯವಂತ ಸಮಾಜ ನಿರ್ಮಾಣ ಸಾಧ್ಯವಾಗುತ್ತದೆ ಎಂದು ಹೇಳಿದರು.
ಇದೇ ಸಂದರ್ಭ ಆರೋಗ್ಯ ಮೇಳದಲ್ಲಿ ರಕ್ತದಾನ ಮಾಡಿದ ಪೌರ ಕಾರ್ಮಿಕ ಮಲ್ಲಿಕಾರ್ಜುನ ಕಾಮದೊಡ್ಡಿ ಮತ್ತು ಆಯುಷ್ಮಾನ್ ಭಾರತ್ ಆರೋಗ್ಯ ಕಾರ್ಡ್ ಫಲಾನುಭವಿಗಳಿಗೆ ಸಚಿವರು ಪ್ರಮಾಣ ಪತ್ರ ಮತ್ತು ಆರೋಗ್ಯ ಕಾರ್ಡ್ಗಳನ್ನು ಸಾಂಕೇತಿಕವಾಗಿ ವಿತರಿಸಿದರು.

ಕಾರ್ಯಕ್ರಮದಲ್ಲಿ ಕೊಪ್ಪಳ ನಗರಸಭೆ ಅಧ್ಯಕ್ಷೆ ಲತಾ ಗವಿಸಿದ್ದಪ್ಪ ಚಿನ್ನೂರು, ಜಿಲ್ಲಾಧಿಕಾರಿ ವಿಕಾಸ್ ಕಿಶೋರ್ ಸುರಳ್ಕರ್, ಜಿ.ಪಂ ಸಿಇಒ ಬಿ ಫೌಜಿಯಾ ತರನ್ನುಮ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧಿಕಾರಿ ಡಾ.ಅಲಕನಂದಾ ಡಿ. ಮಳಗಿ, ಜಿಲ್ಲಾ ಶಸ್ತçಚಿಕಿತ್ಸಕ ಡಾ. ಈಶ್ವರ್ ಸವಡಿ, ಜಿಲ್ಲಾ ಆಯುಷ್ ಅಧಿಕಾರಿ ಡಾ.ಬಸವರಾಜ್ ಕುಂಬಾರ್, ರಾಜ್ಯ ಸರ್ಕಾರಿ ನೌಕರರದ ಸಂಘದ ರಾಜ್ಯ ಉಪಾಧ್ಯಕ್ಷ ಹಾಗೂ ಕೊಪ್ಪಳ ಜಿಲ್ಲಾ ಘಟಕದ ಅಧ್ಯಕ್ಷ ನಾಗರಾಜ ಜುಮ್ಮನ್ನವರ್ ಸೇರಿದಂತೆ ಜಿಲ್ಲಾ ಕಾರ್ಯಕ್ರಮ ಅನುಷ್ಠಾನಾಧಿಕಾರಿಗಳು, ತಾಲ್ಲೂಕ ಮಟ್ಟದ ಆರೋಗ್ಯ ಅಧಿಕಾರಿಗಳು, ಆಶಾ ಕಾರ್ಯಕರ್ತೆಯರು, ಸಾರ್ವಜನಿಕರು ಉಪಸ್ಥಿತರಿದ್ದರು.

Please follow and like us: