ಎಸ್‌ಸಿಪಿ-ಟಿಎಸ್‌ಪಿ ಯೋಜನೆಯಡಿ ಇಲಾಖಾ ಅಧಿಕಾರಿಗಳು ಅರ್ಹ ಫಲಾನುಭವಿಗಳಿಗೆ ಸೌಲಭ್ಯ ಒದಗಿಸಿ : ವಿಕಾಸ್ ಕಿಶೋರ್ ಸುರಳ್ಕರ್

ಕೊಪ್ಪಳ,  : ಎಸ್‌ಸಿಪಿ-ಟಿಎಸ್‌ಪಿ ಯೋಜನೆಯಡಿ ಇಲಾಖಾ ಅಧಿಕಾರಿಗಳು ಅರ್ಹ ಫಲಾನುಭವಿಗಳು ನಿಗದಿತ ಸಮಯಕ್ಕೆ ಸೌಲಭ್ಯ ಒದಗಿಸಬೇಕು ಎಂದು ಜಿಲ್ಲಾಧಿಕಾರಿ ವಿಕಾಸ್ ಕಿಶೋರ್ ಸುರಳ್ಕರ್ ಅವರು ಅಧಿಕಾರಿಗಳಿಗೆ ತಿಳಿಸಿದರು.
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಗುರುವಾರದಂದು ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಕರ್ನಾಟಕ ಅನುಸೂಚಿತ ಜಾತಿಗಳ ಉಪಯೋಜನೆ ಮತ್ತು ಬುಡಕಟ್ಟು ಉಪಯೋಜನೆ(ಯೋಜನೆ ರೂಪಿಸುವುದು, ಆರ್ಥಿಕ ಸಂಪನ್ಮೂಲಗಳ ಹಂಚಿಕೆ ಮತ್ತು ಬಳಕೆ) ಅಧಿನಿಯಮ 2013 ರನ್ವಯ ಅನುಸೂಚಿತ ಜಾತಿಗಳು ಉಪಯೋಜನೆ/ಬುಡಕಟ್ಟು ಉಪಯೋಜನೆಗಳನ್ನು ಅನುಷ್ಠಾನಗೊಳಿಸಲು ಆಯೋಜಿಸಿದ್ದ ಜಿಲ್ಲಾ ಮೇಲ್ವಿಚಾರಣಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ತಾಲ್ಲೂಕು ವ್ಯಾಪ್ತಿಯ ಯಾವುದೇ ಗ್ರಾಮದಲ್ಲಿ ಎಸ್‌ಸಿಪಿ-ಟಿಎಸ್‌ಪಿ ಯೋಜನೆಯಡಿ ಮಂಜೂರಾದ ಅಭಿವೃದ್ಧಿ ಕಾಮಗಾರಿಗಳ ಸಮರ್ಪಕ ಅನುಷ್ಠಾನದ ಬಗ್ಗೆ ಸಂಬAಧಿಸಿದ ತಾಲ್ಲೂಕು ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಮಾಹಿತಿಯನ್ನು ಸಂಗ್ರಹಿಸಬೇಕು. ಸ್ಥಳಕ್ಕೆ ಭೇಟಿ ನೀಡುವುದು ಅಥವಾ ಸಂಬAಧಿಸಿದ ಇಲಾಖೆ ಅಧಿಕಾರಿಯನ್ನು ಸಂಪರ್ಕಿಸಿ, ನಿಗದಿತ ಸಮಯಕ್ಕೆ ಕಾಮಗಾರಿ ಪೂರ್ಣಗೊಳಿಸುವಂತೆ ಕ್ರಮ ವಹಿಸಬೇಕು. ವಿಶೇಷವಾಗಿ ಯೋಜನೆಯಡಿ ಮಂಜೂರಾದ ಅಭಿವೃದ್ಧಿ ಕಾಮಗಾರಿ ಗುರುತಿಸಲ್ಪಟ್ಟ ನಿವೇಶನ ಅಥವಾ ಗ್ರಾಮದಲ್ಲಿ ಅವಶ್ಯಕತೆ ಇದೆಯೇ, ಅದರಿಂದ ಫಲಾನುಭವಿಗಳಿಗೆ ಅನುಕೂಲವಾಗುವುದೋ ಇಲ್ಲವೋ ಎಂಬುದನ್ನು ಪರಿಶೀಲಿಸಿದ ನಂತರವೇ ಕಾಮಗಾರಿ ಆರಂಭಿಸಬೇಕು. ಅನಗತ್ಯವಾಗಿ ಅರ್ಹ ಫಲಾನುಭವಿಗಳು ಇಲ್ಲದ ಗ್ರಾಮ ಅಥವಾ ಪ್ರದೇಶದಲ್ಲಿ ಯಾವುದೇ ಕಾಮಗಾರಿ ಕೈಗೊಳ್ಳಬೇಡಿ ಎಂದು ಅವರು ಸೂಚಿಸಿದರು.
ಜಿಲ್ಲೆಯಲ್ಲಿ ಅಂದಾಜು 440 ನ್ಯಾಯಬೆಲೆ ಅಂಗಡಿಗಳಿದ್ದು, ಅವುಗಳನ್ನು ಸೊಸೈಟಿಗಳು ನಿರ್ವಹಿಸುತ್ತಿವೆ. ನಿಯಮಾನುಸಾರ ಪ್ರತಿ ಸೊಸೈಟಿಯು ಎರಡಕ್ಕಿಂತ ಹೆಚ್ಚು ನ್ಯಾಯಬೆಲೆಯನ್ನು ನಿರ್ವಹಿಸುವಂತಿಲ್ಲ. ಜಿಲ್ಲೆಯ ಎಲ್ಲ ಸೊಸೈಟಿಗಳನ್ನು ಪರಿಶೀಲಿಸಿ ಎರಡಕ್ಕಿಂತ ಹೆಚ್ಚು ನ್ಯಾಯಬೆಲೆ ಅಂಗಡಿಯನ್ನು ನಿರ್ವಹಿಸುತ್ತಿದ್ದರೆ ಅವುಗಳನ್ನು ನಿಯಮಾನುಸಾರ ಎಸ್‌ಸಿಪಿ-ಟಿಎಸ್‌ಪಿ ಯೋಜನೆಯಡಿ ಅರ್ಹ ಫಲಾನುಭವಿಗಳಿಗೆ ವಿತರಿಸಿ. ಇದರಿಂದ ನಿರುದ್ಯೋಗಿಗಳಿಗೆ ಉದ್ಯೋಗಾವಕಾಶ ದೊರೆಯುತ್ತದೆ ಎಂದು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಅಧಿಕಾರಿಗೆ ಸೂಚಿಸಿದರು.
ಕೆಲವು ಗ್ರಾಮಗಳಲ್ಲಿ ಮಳೆಯಿಂದ ಹರಿದುಹೋಗುವ ನೀರು ಎಸ್‌ಸಿ-ಎಸ್‌ಟಿ ಸಮುದಾಯದ ಜನರು ವಾಸಿಸುವ ಕಾಲೋನಿಗಳಲ್ಲಿ ಸಂಗ್ರಹವಾಗುತ್ತದೆ. ಇದರಿಂದ ಸಮುದಾಯದ ಜನರು ವಾಸಕ್ಕೆ, ಆರೋಗ್ಯಕ್ಕೆ ತೊಂದರೆ ಉಂಟಾಗುತ್ತದೆ. ಆದ್ದರಿಂದ ಅಂತಹ ಕಾಲೋನಿಗಳನ್ನು ಗುರುತಿಸಿ ಸೂಕ್ತ ಚರಂಡಿ ವ್ಯವಸ್ಥೆ ಕಲ್ಪಿಸಿ, ಎಸ್‌ಸಿ-ಎಸ್‌ಟಿ ಕಾಲೋನಿಗಳಲ್ಲಿ ಅಗತ್ಯ ಮೂಲ ಸೌಕರ್ಯಗಳನ್ನು ಒದಗಿಸಿ. ಯಾವುದೇ ಇಲಾಖೆಯಿಂದ ಹಂಚಿಕೆಯಾದ ಎಸ್‌ಸಿಪಿ-ಟಿಎಸ್‌ಪಿ ಯೋಜನೆ ಅನುದಾನವನ್ನು ಅರ್ಹ ಫಲಾನುಭವಿಗಳಿಗೆ, ಕಾಮಗಾರಿಗಳಿಗೆ ಬಳಸಿಕೊಳ್ಳಬೇಕು. ಫಲಾನುಭವಿಗಳು ಸೌಲಭ್ಯದಿಂದ ವಂಚಿತವಾಗಬಾರದು ಎಂದು ಅವರು ಅಧಿಕಾರಿಗಳಿಗೆ ತಿಳಿಸಿದರು.
ಸಭೆಯಲ್ಲಿ ಡಿಎಫ್‌ಒ ಹರ್ಷಕುಮಾರ, ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ಸಮೀರ್ ಮುಲ್ಲಾ, ಯೋಜನಾ ನಿರ್ದೇಶಕರಾದ ಕೃಷ್ಣಮೂರ್ತಿ ಟಿ., ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ಚಿದಾನಂದಪ್ಪ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.