ಹೆಸರು ಕಾಳು ಖರೀದಿ ಕೇಂದ್ರ ತೆರೆಯಲು ಸರ್ಕಾರಕ್ಕೆ ಪ್ರಸ್ತಾವನೆ : ಎಂ.ಸುಂದರೇಶ್ ಬಾಬು

ಬೆಂಬಲ ಬೆಲೆ ಯೋಜನೆ : ಟಾಸ್ಕ್ ಫೋರ್ಸ್ ಸಮಿತಿ ಸಭೆ


ಕೊಪ್ಪಳ, : ಜಿಲ್ಲೆಯಲ್ಲಿ ಹೆಸರು ಕಾಳು ಖರೀದಿ ಕೇಂದ್ರಗಳನ್ನು ತೆರೆಯಲು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲು ತೀರ್ಮಾನಿಸಲಾಗಿದೆ ಎಂದು ಜಿಲ್ಲಾ ಟಾಸ್ಕ್ ಫೋರ್ಸ್ ಸಮಿತಿಯ ಅಧ್ಯಕ್ಷರು ಹಾಗೂ ಜಿಲ್ಲಾಧಿಕಾರಿ ಎಂ.ಸುಂದರೇಶ್ ಬಾಬು ಅವರು ಹೇಳಿದರು.
ಪ್ರಸಕ್ತ ಸಾಲಿನ ಬೆಂಬಲ ಬೆಲೆ ಯೋಜನೆಯಡಿ ಹೆಸರು ಕಾಳು ಖರೀದಿ ಕೇಂದ್ರಗಳ ತೆರೆಯುವ ಕುರಿತಂತೆ ಜಿಲ್ಲಾ ಕೃಷಿ ಉತ್ಪನ್ನಗಳ ಮಾರುಕಟ್ಟೆ ಸಮಿತಿ ವತಿಯಿಂದ (ಎಪಿಎಂಸಿ) ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಶನಿವಾರದಂದು (ಆ.06) ಆಯೋಜಿಸಲಾಗಿದ್ದ ಜಿಲ್ಲಾ ಮಟ್ಟದ ಟಾಸ್ಕ್ಫೋರ್ಸ್ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಮುಂಗಾರು ಹೆಸರು ಕಾಳು ಪ್ರಸ್ತುತ ಕಾಟಾವಿನ ಹಂತದಲ್ಲಿದ್ದು, ಕೇಂದ್ರ ಸರ್ಕಾರದ ಬೆಂಬಲ ಬೆಲೆ ಯೋಜನೆಯಡಿ ಹೆಸರನ್ನು ಖರೀದಿಸಬೇಕಾಗಿದೆ. ಬಿತ್ತನೆ ಕ್ಷೇತ್ರವನ್ನು ಆಧಾರವಾಗಿಟ್ಟುಕೊಂಡು ಇಳುವರಿ ಪ್ರಮಾಣವನ್ನು ಅಂದಾಜಿಸಿ ಖರೀದಿ ಕೇಂದ್ರಗಳನ್ನು ಪ್ರಾರಂಭಿಸಲು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಬೇಕಾಗಿದೆ. ಖರೀದಿ ಕೇಂದ್ರಗಳನ್ನು ಪ್ರಾರಂಭಿಸಲು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸುವ ಕುರಿತಂತೆ ಹಾಗೂ ಖರೀದಿ ಕೇಂದ್ರಗಳ ಬಗ್ಗೆ ರೈತರಿಗೆ ಮುಂಚಿತವಾಗಿ ಮಾಹಿತಿ ನೀಡುವುದರ ಜೊತೆಗೆ ಬೆಂಬಲ ಬೆಲೆ ಯೋಜನೆಯ ಲಾಭ ಸಿಗುವ ನಿಟ್ಟಿನಲ್ಲಿ ರೈತರಿಗೆ ಮಾಹಿತಿ ನೀಡಬೇಕು ಎಂದು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಖರೀದಿ ಕೇಂದ್ರಗಳ ಪ್ರಾರಂಭಿಸುವ ಹಿನ್ನೆಲೆಯಲ್ಲಿ ಸರ್ಕಾರದಿಂದ ನಿರ್ದೇಶನ ಬಂದ ತಕ್ಷಣ ಗುರುತಿಸಲಾದ ಸ್ಥಳಗಳಲ್ಲಿ ಹೆಸರು ಕಾಳು ಖರೀದಿ ಕೇಂದ್ರಗಳನ್ನು ಪ್ರಾರಂಭಕ್ಕೆ ತ್ವರಿತವಾಗಿ ಕ್ರಮ ಕೈಗೊಳ್ಳಬೇಕು. ಅಲ್ಲದೇ ಖರೀದಿಸುವ ಹೆಸರು ಕಾಳಿನ ದಾಸ್ತಾನು ಮಾಡುವ ಕುರಿತಂತೆ ಗೊದಾಮುಗಳ ಸ್ಥಳಗಳ ಲಭ್ಯತೆ ಹಾಗೂ ಅಗತ್ಯ ಮುಂಜಾಗೃತ ಕ್ರಮ ವಹಿಸಿ ಎಂದು ಜಿಲ್ಲಾಧಿಕಾರಿಗಳು ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ಸಹಾಯಕ ನಿರ್ದೇಶಕರು ಹಾಗೂ ಜಿಲ್ಲಾ ಟಾಸ್ಕ್ ಫೋರ್ಸ್ ಸಮಿತಿಯ ಸದಸ್ಯ ಕಾರ್ಯದರ್ಶಿ ಎಸ್.ಶ್ಯಾಮ್ ಅವರು ಮಾತನಾಡಿ, ಕೃಷಿ ಇಲಾಖೆಯ ಮಾಹಿತಿ ಆಧಾರದ ಮೇಲೆ ಪ್ರಸ್ತುತ ಜಿಲ್ಲೆಯಲ್ಲಿ 21,307 ಹೆಕ್ಟೇರ್ ಪ್ರದೇಶದಲ್ಲಿ ಹೆಸರುಕಾಳು ಬಿತ್ತನೆ ಮಾಡಲಾಗಿದೆ. ಒಂದು ಹೆಕ್ಟರ್‌ಗೆ ಅಂದಾಜು 8 ಕ್ವೀಂಟಲ್ ನಂತೆ ಹೆಸರು ಕಾಳು ಸುಮಾರು 1 ಲಕ್ಷ 80 ಸಾವಿರ ಕ್ವೀಂಟಲ್ ಇಳುವರಿ ಬರುವ ಸಾಧ್ಯತೆ ಇದೆ. ಪ್ರಸ್ತುತ ಹೆಸರು ಕಾಳಿನ ದರವು ರೂ. 6400 ರಿಂದ 7400 ವರೆಗೆ ಇದ್ದು, ಕಳೆದ ಬಾರಿಯಂತೆಯೇ ಖರೀದಿ ಕೇಂದ್ರಗಳನ್ನು ಜಿಲ್ಲೆಯ ಕೊಪ್ಪಳ ಎಪಿಎಂ.ಸಿ ಹಾಗೂ ತಾಲ್ಲೂಕಿನ ಹಿರೇಸಿಂಧೋಗಿ, ಕುಷ್ಟಗಿ ತಾಲ್ಲೂಕಿನ ತಾವರಗೇರಾ ಹಾಗೂ ಹನುಮಸಾಗರ ಮತ್ತು ಕುಕನೂರು ಹಾಗೂ ಯಲಬುರ್ಗಾ ಟಿಎಪಿಎಂಸಿಗಳು ಸೇರಿ ಜಿಲ್ಲೆಯಲ್ಲಿ ಒಟ್ಟು ಆರು ಖರೀದಿ ಕೇಂದ್ರಗಳನ್ನು ಪ್ರಾರಂಭಿಸಿಬೇಕಿದೆ ಎಂದು ಸಭೆಗೆ ಮಾಹಿತಿ ನೀಡಿದರು.

ಸಭೆಯಲ್ಲಿ ಉಪ ವಿಭಾಗಾಧಿಕಾರಿ ಬಸವಣ್ಣಪ್ಪ ಕಲಶೆಟ್ಟಿ, ಕೃಷಿ ಇಲಾಖೆಯ ಜಂಟಿ ನಿರ್ದೇಶಕ ಸದಾಶಿವ, ಆಹಾರ ಮತ್ತು ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆಯ ಉಪ ನಿರ್ದೇಶಕ ಮಲ್ಲಿಕಾರ್ಜುನ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಖರೀದಿ ಏಜೆನ್ಸಿಗಳ ಪ್ರತಿನಿಧಿಗಳು ಉಪಸ್ಥಿತರಿದ್ದರು.

Please follow and like us: