ಈ ಪ್ರಕರಣದ ಸಮಗ್ರ ತನಿಖೆ ನಡೆಸಬೇಕು ಎಂದು ಮಾಜಿ ಸಿಎಂ ಹೆಚ್.ಡಿ,ಕುಮಾರಸ್ವಾಮಿ ಆಗ್ರಹಿಸಿ್ದ್ದಾರೆ. ಶಿವಮೊಗ್ಗದ ಅಬ್ಬಲಗೆರೆಯ ಹುಣಸೋಡು ಗ್ರಾಮದ ಕಲ್ಲುಕ್ವಾರಿಯಲ್ಲಿ ಜಿಲಿಟಿನ್ ಕಡ್ಡಿಗಳ ಸ್ಫೋಟದಿಂದ ಅನೇಕ ಕಾರ್ಮಿಕರು ಸಾವು ಕಂಡಿರುವುದು ಅತ್ಯಂತ ನೋವಿನ ಸಂಗತಿ. ಮೃತರ ಆತ್ಮಕ್ಕೆ ಚಿರಶಾಂತಿ ಸಿಗಲಿ. ಕಲ್ಲು ಕ್ವಾರಿಯಲ್ಲಿ ನಡೆದ ಈ ಸ್ಫೋಟದುರಂತದ ಬಗ್ಗೆ ರಾಜ್ಯ ಸರ್ಕಾರ ತನಿಖೆ ನಡೆಸಬೇಕು. ಬಡ ಕಾರ್ಮಿಕರ ಜೀವ ಹರಣಕ್ಕೆ, ಈ ದುರ್ಘಟನೆಗೆ ಕಾರಣರಾದವರ ಮೇಲೆ ಕಠಿಣ ಕ್ರಮ ಕೈಗೊಳ್ಳಬೇಕು. ಮುಂದಿನ ದಿನಗಳಲ್ಲಿ ಇಂತಹ ಅವಘಡಗಳು ಮರುಕಳಿಸದಂತೆ ಎಚ್ಚರವಹಿಸಬೇಕು. ಎಂದು ಟ್ವೀಟ್ ಮಾಡಿದ್ದಾರೆ
ವಿಪಕ್ಷ ನಾಯಕ ಸಿದ್ದರಾಮಯ್ಯ ಶಿವಮೊಗ್ಗ ನಗರ ಸಮೀಪ ಜಿಲೆಟಿನ್ ಸ್ಪೋಟಗೊಂಡು ಹಲವು ಮಂದಿ ಕಾರ್ಮಿಕರು ಸಾವಿಗೀಡಾದ ಸುದ್ದಿ ಕೇಳಿ ಸಂಕಟವಾಯಿತು. ಮುಖ್ಯಮಂತ್ರಿಗಳು ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಹಾಗೂ ಮೃತ ಕಾರ್ಮಿಕರ ಕುಟುಂಬಗಳಿಗೆ ಸೂಕ್ತ ಪರಿಹಾರ ನೀಡಬೇಕು. ಮೃತರ ಶೋಕತಪ್ತ ಕುಟುಂಬಕ್ಕೆ ನನ್ನ ಸಂತಾಪಗಳು. ನಿರ್ಲಕ್ಷ್ಯ ತೋರುವ ಮೂಲಕ ಘಟನೆಗೆ ಕಾರಣರಾದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಜರುಗಿಸಬೇಕು ಎಂದು ಮುಖ್ಯಮಂತ್ರಿಗಳನ್ನು ಒತ್ತಾಯಿಸುತ್ತೇನೆ. ರಾಜ್ಯದ ಹಲವೆಡೆ ಅಕ್ರಮ ಗಣಿಗಾರಿಕೆ ನಿರಾತಂಕವಾಗಿ ನಡೆಯುತ್ತಿರುವ ಆರೋಪ ಕೇಳಿಬರುತ್ತಿದ್ದು, ಅವುಗಳ ಮೇಲೆ ಸರ್ಕಾರ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಬೇಕಿದೆ ಎಂದು ಒತ್ತಾಯಿಸಿದ್ದಾರೆ. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸಹ ಪ್ರಕರಣದ ತನಿಖೆಗೆ ಒತ್ತಾಯ ಮಾಡಿದ್ದಾರೆ.
ಶಿವಮೊಗ್ಗ ಶಿವಮೊಗ್ಗದ ಹುಣಸೋಡು ಗಣಿ ಪ್ರದೇಶದಲ್ಲಿ ಜಿಲೆಟಿನ್ ಸ್ಫೋಟ ದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಜಮೀನು ಮಾಲಕ ಸಹಿತ ಮೂವರನ್ನು ಪೊಲೀಸರು ವಶಕ್ಕೆ ಪಡೆದಿರುವುದಾಗಿ ತಿಳಿದುಬಂದಿದೆ.
ಸ್ಫೋಟ ಸಂಭವಿಸಿದ ಕಲ್ಲು ಗಣಿಗಾರಿಕೆಗೆ ಜಮೀನು ನೀಡಿದ ಅವಿನಾಶ್ ಕುಲಕರ್ಣಿ, ಗುತ್ತಿಗೆದಾರ ಸುಧಾಕರ್ ಹಾಗೂ ಜಿಲೆಟಿನ್ ಪೂರೈಕೆ ಮಾಡುತ್ತಿದ್ದ ಆರೋಪದಲ್ಲಿ ನರಸಿಂಹ ಎಂಬುವರನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ
ಬಾಂಬ್ ನಿಷ್ಕ್ರಿಯ ದಳ ಆಗಮನ
ಘಟನಾ ಸ್ಥಳಕ್ಕೆ ಇಂದು ಪೂರ್ವಾಹ್ನ 11ರ ಸುಮಾರಿಗೆ ಬಾಂಬ್ ನಿಷ್ಕ್ರಿಯ ದಳ, ಗಣಿ ಮತ್ತು ಭೂ ವಿಜ್ಞಾನ ಅಧಿಕಾರಿಗಳು, ಶ್ವಾನದಳ ಆಗಮಿಸಿದ್ದು, ಪರಿಶೀಲನೆ ಆರಂಭಿಸಿದ್ದಾರೆ.
ಸ್ಥಳದಲ್ಲಿ ಇನ್ನೂ ಸಜೀವ ಜಿಲೆಟಿನ್ ಇರುವ ಶಂಕೆಯಿದ್ದು, ಪರಿಶೀಲನೆ ನಡೆಸಲಾಗುತ್ತಿದೆ. ಪರಿಶೀಲನೆ ಬಳಿಕ ಮೃತರ ಸಂಖ್ಯೆ ಬಗ್ಗೆ ಖಚಿತ ಮಾಹಿತಿ ಲಭ್ಯವಾಗಲಿದೆ. ಈ ಮಧ್ಯೆ, ಸ್ಫೋಟದಿಂದ ಸಿಡಿದು ಹೊರಬಿದ್ದಿದ್ದ ಎರಡು ಮೃತದೇಹಗಳನ್ನು ಮೆಗ್ಗಾನ್ ಆಸ್ಪತ್ರೆಗೆ ರವಾನಿಸಲಾಗಿದೆ.
ಘಟನಾ ಸ್ಥಳ ಸೇರಿ ಗಣಿಗಾರಿಕೆ ಪ್ರದೇಶಕ್ಕೆ ಸಾರ್ವಜನಿಕರ ಪ್ರವೇಶ ನಿರ್ಬಂಧಿಸಲಾಗಿದೆ. ಪೊಲೀಸ್ ಬಂದೋಬಸ್ತ್ ಕಲ್ಪಿಸಲಾಗಿದೆ.