ಅಧಿಕಾರಿಗಳು ಕೇಂದ್ರಸ್ಥಾನ ಬಿಡುವ ಪೂರ್ವದಲ್ಲಿ ಜಿಲ್ಲಾಧಿಕಾರಿ ಅನುಮತಿ ಕಡ್ಡಾಯ

: ಕೊಪ್ಪಳ ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಎಲ್ಲಾ ಅಧಿಕಾರಿಗಳು ಕೇಂದ್ರಸ್ಥಾನ ಬಿಡುವ ಪೂರ್ವದಲ್ಲಿ ಕಡ್ಡಾಯವಾಗಿ ಜಿಲ್ಲಾಧಿಕಾರಿಗಳ ಅನುಮತಿಯನ್ನು ಪಡೆಯಬೇಕು ಎಂದು ಅಪರ ಜಿಲ್ಲಾಧಿಕಾರಿ ಡಾ. ರುದ್ರೇಶ ಘಾಳಿ ಅವರು ತಿಳಿಸಿದ್ದಾರೆ.
ಭಾರತ ಚುನಾವಣಾ ಆಯೋಗವು ಕರ್ನಾಟಕ ರಾಜ್ಯ ವಿಧಾನಸಭೆಗೆ ಚುನಾವಣೆ ನಡೆಸಲು ದಿನಾಂಕ ನಿಗದಿಪಡಿಸಿದ್ದು, ಈಗಾಗಲೇ ನೀತಿ ಸಂಹಿತೆ ಜಾರಿಯಲ್ಲಿದೆ. ಮೇ. ೧೨ ರಂದು ನಡೆಯಲಿರುವ ವಿಧಾನಸಭಾ ಸಾರ್ವತ್ರಿಕ ಚುನಾವಣೆ ಮುಕ್ತ, ಶಾಂತ ಹಾಗೂ ನಿಷಪಕ್ಷಪಾತವಾಗಿ ಕೈಗೊಳ್ಳಲು ಜಿಲ್ಲಾ ಮತ್ತು ತಾಲೂಕು ಮಟ್ಟದ ಅಧಿಕಾರಿಗಳನ್ನು ವಿವಿಧ ತಂಡಗಳ ಮುಖ್ಯಸ್ಥರನ್ನಾಗಿ ನಿಯೋಜಿಸಲಾಗಿದೆ. ಹಾಗೂ ಚುನಾವಣಾ ಕಾರ್ಯಕ್ರಮಗಳನ್ನು ಚುನಾವಣಾ ಆಯೋಗದ ನಿರ್ದೇಶನಗಳಂತೆ ನಿಗದಿತ ಕಾಲಮಿತಿಯಲ್ಲಿ ಪೂರ್ಣಗೊಳಿಸಬೇಕಾಗಿರುವುದರಿಂದ ಕೊಪ್ಪಳ ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಎಲ್ಲಾ ಜಿಲ್ಲಾ ಮತ್ತು ತಾಲೂಕು ಮಟ್ಟದ ಅಧಿಕಾರಿಗಳು ತಮ್ಮ ಕೇಂದ್ರಸ್ಥಾನಗಳಲ್ಲಿ ಉಪಸ್ಥಿತರಿರುವುದು ಅತ್ಯಾವಶ್ಯಕವಾಗಿರುತ್ತದೆ. ಇದಲ್ಲದೇ ಚುನಾವಣಾ ಕಾರ್ಯಕ್ಕೆ ನಿಯೋಜನೆಗೊಂಡ ನೌಕರರು ಪ್ರಜಾ ಪ್ರಾತಿನಿಧ್ಯ ಕಾಯಿದೆ ೧೯೫೧ ಕಲಂ ೨೮(ಎ) ಪ್ರಕಾರ ಡೀಮ್ಡ್ ಡೆಪ್ಟೇಶನ್ ನೆಲೆಯಲ್ಲಿ ಕರ್ತವ್ಯ ನಿರ್ವಹಿಸಬೇಕಾಗಿರುತ್ತದೆ.
ಕರ್ನಾಟಕ ವಿಧಾನಸಭಾ ಸಾರ್ವತ್ರಿಕ ಚುನಾವಣೆ ಕೆಲಸ ಕಾರ್ಯಗಳ ಹಿನ್ನಲೆಯಲ್ಲಿ ಕೊಪ್ಪಳ ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಎಲ್ಲಾ ಜಿಲ್ಲಾ ಮತ್ತು ತಾಲೂಕು ಮಟ್ಟದ ಅಧಿಕಾರಿಗಳು ತಮ್ಮ ತಮ್ಮ ಕೇಂದ್ರಸ್ಥಾನಗಳಲ್ಲಿ ಉಪಸ್ಥಿತರಿದ್ದು ಕಾರ್ಯನಿರ್ವಹಿಸಬೇಕು. ತುರ್ತು ಸಂದರ್ಭಗಳಲ್ಲಿ ಕೇಂದ್ರಸ್ಥಾನ ಬಿಡುವ ಪೂರ್ವದಲ್ಲಿ ಕಡ್ಡಾಯವಾಗಿ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಚುನಾವಣಾಧಿಕಾರಿ ಅವರ ಅನುಮತಿಯನ್ನು ಪಡೆದು ಕೇಂದ್ರ ಸ್ಥಾನ ಬಿಡಬೇಕು. ಈ ಸೂಚನೆಗಳನ್ನು ಪಾಲಿಸದ ಅಧಿಕಾರಿಗಳ ವಿರುದ್ಧ ಪ್ರಜಾ ಪ್ರತಿನಿಧ್ಯ ಕಾಯಿದೆ ೧೯೫೦ ಮತ್ತು ೧೯೫೧ರ ಪ್ರಕಾರ ಶಿಸ್ತಿನ ಕ್ರಮ ಜರುಗಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಕೊಪ್ಪಳ ಅಪರ ಜಿಲ್ಲಾಧಿಕಾರಿ ಡಾ. ರುದ್ರೇಶ ಘಾಳಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.