ಚುನಾವಣಾ ಪ್ರಚಾರದಲ್ಲಿ ಮಕ್ಕಳನ್ನು ಬಳಸಿಕೊಳ್ಳದಂತೆ ಸೂಚನೆ

ಕರ್ನಾಟಕ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಅಪ್ರಾಪ್ತ ಮಕ್ಕಳನ್ನು ಚುನಾವಣಾ ಪ್ರಚಾರಕ್ಕಾಗಿ ಬಳಸಿಕೊಳ್ಳುವಂತಿಲ್ಲ ಎಂದು ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗವು ಸೂಚನೆ ನೀಡಿದೆ.
ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗವು ಸಕ್ಷನ್ ೧೩ರ ಅನ್ವಯ ದೂರುಗಳನ್ನು ವಿಚಾರಣೆಗೊಳಪಡಿಸುವ ಮತ್ತು ಸೆಕ್ಷನ್ ೧೪ರ ಅಡಿಯಲ್ಲಿ ಮಕ್ಕಳ ಹಕ್ಕುಗಳ ಉಲ್ಲಂಘನೆಯ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿವಿಲ್ ನ್ಯಾಯಾಲಯದಂತೆ ಕಾರ್ಯನಿರ್ವಹಿಸುವ ಅಧಿಕಾರವನ್ನು ಹೊಂದಿದೆ. ಮಕ್ಕಳ ಹಕ್ಕುಗಳ ಉಲ್ಲಂಘನೆಯಾದ ಪ್ರಕರಣಗಳನ್ನು ಆಯೋಗವು ಸ್ವಯಂಪ್ರೇರಣೆಯಿಂದ (ಸುಮೋಟೋ) ದೂರು ದಾಖಲಿಸಿ ಕ್ರಮಗಳನ್ನು ಕೈಗೊಳ್ಳುವ ಅಧಿಕಾರವನ್ನು ಹೊಂದಿದೆ.
ಭಾರತ ಚುನಾವಣಾ ಆಯೋಗ ಹಾಗೂ ರಾಪ್ಟ್ರ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಇವರು ಮಕ್ಕಳನ್ನು ಚುನಾವಣಾ ಕೆಲಸಗಳಿಗೆ ಬಳಸಿಕೊಳ್ಳದಂತೆ ಸೂಕ್ತ ನಿರ್ದೇಶನಗಳನ್ನು ನೀಡಿದ್ದು, ಪ್ರಸ್ತುತ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ನಡೆಯುತ್ತಿರುವ ಚುನಾವಣಾ ಪ್ರಚಾರ ಕಾರ್ಯದಲ್ಲಿ ರಾಯಚೂರು ಜಿಲ್ಲೆಯಲ್ಲಿ ಅಪ್ರಾಪ್ತ ಮಕ್ಕಳನ್ನು ಪ್ರಚಾರಕ್ಕಾಗಿ ಬಳಸಿಕೊಳ್ಳುತ್ತಿರುವ ಕುರಿತು ಪತ್ರಿಕೆಯಲ್ಲಿ ವರದಿಯಾಗಿತ್ತು. ಸ್ವಯಂ ಸೇವಾ ಸಂಸ್ಥೆಗಳು ಇಂತಹ ಪ್ರಕರಣಗಳನ್ನು ಆಯೋಗದ ಗಮನಕ್ಕೆ ತರುತ್ತಿದ್ದು, ಈ ವಿಷಯನ್ನು ಆಯೋಗವು ಗಂಭೀರವಾಗಿ ಪರಿಗಣಿಸಿದೆ.
ಚುನಾವಣಾ ಪ್ರಚಾರದ ಸಂದರ್ಭದಲ್ಲಿ ದೊಂಬಿ, ಗಲಾಟೆ, ಘರ್ಷಣೆ ಮುಂತಾದ ಅನಿರೀಕ್ಷಿತ ಪ್ರಕರಣಗಳು ಸಂಭವಿಸಬಹುದು. ಅಂತಹ ಸದಂರ್ಭಗಳಲ್ಲಿ ಮಕ್ಕಳು ಬಲಿಯಾಗದಂತೆ ಮುನ್ನೆಚ್ಚರಿಕೆ ವಹಿಸುವುದು ಎಲ್ಲರ ಜವಾಬ್ದಾರಿಯಾಗಿದೆ. ಈ ತರಹದ ಘಟನೆಗಳು ಆದಲ್ಲಿ ಸಂಬಂಧಿಸಿದ ರಾಜಕೀಯ ಪಕ್ಷವು ನೇರ ಹೊಣೆಗಾರರಾಗಿದ್ದು, ಅವರ ವಿರುದ್ಧ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗವು ಕ್ರಮ ತೆಗೆದುಕೊಳ್ಳಬಹುದಾಗಿದೆ. ಚುನಾವಣಾ ಪ್ರಚಾರಕ್ಕಾಗಲಿ, ಪೋಸ್ಟರ್ ಹಂಚುವುದು, ಬ್ಯಾನರ್ ಕಟ್ಟುವುದು ಹಾಗೂ ಇನ್ನಿತರ ಚುನಾವಣಾ ಕಾರ್ಯಾಗಳಿಗಾಗಲಿ ಮಕ್ಕಳನ್ನು ಬಳಸಿದ್ದಲ್ಲಿ, ಆಯೋಗವು ಈ ಬಗ್ಗೆ ಸಂಬಂಧಿಸಿದವರ ಮೇಲೆ ಕ್ರಮ ಕೈಗೊಳ್ಳುವುದು ಅನಿವಾರ್ಯವಾಗುತ್ತದೆ ಎಂದು ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಪ್ರಕಟಣೆಯಲ್ಲಿ ಎಚ್ಚರಿಕೆ ನೀಡಿದೆ.

Please follow and like us:
error