ಮೇ. 15 ರಂದು ಮತ ಎಣಿಕೆಗೆ ಕೊಪ್ಪಳ ಜಿಲ್ಲಾಡಳಿತ ಸಜ್ಜು

ಪ್ರಸಕ್ತ ವಿಧಾನಸಭೆ ಚುನಾವಣೆಯ ಮತದಾನ ಪ್ರಕ್ರಿಯೆ ಕೊಪ್ಪಳ ಜಿಲ್ಲೆಯಲ್ಲಿ ಬಹುತೇಕ ಶಾಂತಿಯುತವಾಗಿ ಪೂರ್ಣಗೊಂಡಿದ್ದು, ಜಿಲ್ಲೆಯ ಐದೂ ವಿಧಾನಸಭಾ ಕ್ಷೇತ್ರಗಳ ಮತ ಎಣಿಕೆ ಕಾರ್ಯ ಮೇ. 15 ರಂದು ಬೆಳಿಗ್ಗೆ 07 ಗಂಟೆಯಿಂದ ನಗರದ ಶ್ರೀ ಗವಿಸಿದ್ದೇಶ್ವರ ಮಹಾ ವಿದ್ಯಾಲಯದಲ್ಲಿ ನಡೆಯಲಿದೆ.
ಶನಿವಾರದಂದು ವಿಧಾನಸಭಾ ಕ್ಷೇತ್ರಗಳಿಗೆ ಮತದಾನ ಜರುಗಿದ್ದು, ಅಭ್ಯರ್ಥಿಗಳ ಭವಿಷ್ಯ ಮತ ಯಂತ್ರಗಳಲ್ಲಿ ಭದ್ರವಾಗಿದೆ. ಮೇ. 15 ರಂದು ಮಧ್ಯಾಹ್ನ 12 ಗಂಟೆಯ ವೇಳೆಗೆ ಎಲ್ಲ ಅಭ್ಯರ್ಥಿಗಳ ಸೋಲು-ಗೆಲುವಿನ ಲೆಕ್ಕಾಚಾರಕ್ಕೆ ತೆರೆ ಬೀಳುವ ಸಾಧ್ಯತೆಗಳಿವೆ. ಮತದಾನ ದಾಖಲಾಗಿರುವ ಮತ ಯಂತ್ರಗಳನ್ನು ಬಿಗಿ ಪೊಲೀಸ್ ಬಂದೋಬಸ್ತ್‍ನಲ್ಲಿ ಗವಿಸಿದ್ದೇಶ್ವರ ಮಹಾ ವಿದ್ಯಾಲಯದ ದಾಸ್ತಾನು ಕೊಠಡಿಗಳಲ್ಲಿ ಇರಿಸಲಾಗಿದೆ. ಮತ ಎಣಿಕೆ ಕಾರ್ಯವನ್ನು ಸುಗಮವಾಗಿ ಕೈಗೊಳ್ಳಲು ಪ್ರತಿ ವಿಧಾನಸಭಾ ಕ್ಷೇತ್ರಕ್ಕೆ ತಲಾ 14 ಟೇಬಲ್‍ಗಳನ್ನು ವ್ಯವಸ್ಥಿತಗೊಳಿಸಲಾಗಿದ್ದು, 17 ಮತ ಎಣಿಕಾ ಮೇಲ್ವಿಚಾರಕರು, 17 ಎಣಿಕಾ ಸಹಾಯಕರು, 17 ಸ್ಟ್ಯಾಟಿಕ್ ಅಬ್ಸರ್ವರ್ಸ್ ಗಳನ್ನು ನಿಯೋಜಿಸಲಾಗಿದೆ. ಕೊಪ್ಪಳ ಜಿಲ್ಲೆಗೆ ಒಟ್ಟು 70 ಟೇಬಲ್‍ಗಳಂತೆ, 85 ಜನ ಎಣಿಕಾ ಮೇಲ್ವಿಚಾರಕರು, 85 ಜನ ಎಣಿಕಾ ಸಹಾಯಕರು ಮತ್ತು 85 ಜನ ಸ್ಟ್ಯಾಟಿಕ್ ಅಬ್ಸರ್ವರ್ಸ್‍ಗಳನ್ನು ನೇಮಕ ಮಾಡಲಾಗಿದೆ. ಮತ ಎಣಿಕೆ ಅಧಿಕಾರಿಗಳು, ಸಹಾಯಕರಿಗೆ ಜಿಲ್ಲಾಡಳಿತ ಭವನದ ಆಡಿಟೋರಿಯಂ ಹಾಲ್‍ನಲ್ಲಿ ಸೋಮವಾರದಂದು ಎರಡನೆ ಹಂತದ ಮತ ಎಣಿಕೆ ತರಬೇತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ಕುಷ್ಟಗಿ ವಿಧಾನಸಭಾ ಕ್ಷೇತ್ರದಲ್ಲಿ ಒಟ್ಟು 269 ಮತಗಟ್ಟೆಗಳಿದ್ದು, ಈ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಸುಮಾರು 19 ಸುತ್ತು ಮತ ಎಣಿಕೆ ನಡೆಯುವ ಸಾಧ್ಯತೆ ಇದೆ. ಕನಕಗಿರಿ ಕ್ಷೇತ್ರದಲ್ಲಿ ಒಟ್ಟು 260 ಮತಗಟ್ಟೆಗಳಿದ್ದು, ಈ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಸುಮಾರು 18 ಸುತ್ತು. ಗಂಗಾವತಿ ಕ್ಷೇತ್ರದಲ್ಲಿ 232 ಮತಗಟ್ಟೆಗಳಿದ್ದು, ಈ ಕ್ಷೇತ್ರಕ್ಕೆ ಸಂಬಂಧಿಸಿದಂತೆ 17 ಸುತ್ತು. ಯಲಬುರ್ಗಾ ಕ್ಷೇತ್ರದಲ್ಲಿ 253 ಮತಗಟ್ಟೆಗಳಿದ್ದು, ಈ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಸುಮಾರು 18 ಸುತ್ತು. ಹಾಗೂ ಕೊಪ್ಪಳ ಕ್ಷೇತ್ರದಲ್ಲಿ ಒಟು 287 ಮತಗಟ್ಟೆಗಳಿದ್ದು, ಈ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಸುಮಾರು 20 ಸುತ್ತು ಮತ ಎಣಿಕೆ ನಡೆಯುವ ಸಾಧ್ಯತೆ ಇದೆ. ಕೊಪ್ಪಳದ ಶ್ರೀ ಗವಿಸಿದ್ದೇಶ್ವರ ಮಹಾ ವಿದ್ಯಾಲಯದಲ್ಲಿ ಮತ ಎಣಿಕೆಗೆ ಸಕಲ ವ್ಯವಸ್ಥೆ ಕೈಗೊಳ್ಳಲಾಗಿದೆ ಎಂದು ಕೊಪ್ಪಳ ಚುನಾವಣಾ ವಿಭಾಗ ತಿಳಿಸಿದೆ.

Please follow and like us:
error