ಚುನಾವಣಾ ಪ್ರಚಾರದಲ್ಲಿ ಮಕ್ಕಳ ಬಳಕೆ ನಿಷೇಧ : ಪಿ. ಸುನೀಲ್ ಕುಮಾರ್


ಕೊಪ್ಪಳ ಮಾ  : ಲೋಕಸಭಾ ಸಾರ್ವತ್ರಿಕ ಚುನಾವಣೆ ಹಿನ್ನೆಯಲ್ಲಿ ಚುನಾವಣಾ ಕಾರ್ಯ ಮತ್ತು ಪ್ರಚಾರ ಕಾರ್ಯಗಳಲ್ಲಿ ಮಕ್ಕಳನ್ನು ಬಳಸಿಕೊಳ್ಳುವುದನ್ನು ನಿಷೇಧಿಸಲಾಗಿದೆ ಎಂದು ಕೊಪ್ಪಳ ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಪಿ. ಸುನೀಲ್ ಕುಮಾರ್ ಅವರು ತಿಳಿಸಿದ್ದಾರೆ.
ಭಾರತ ಸರಕಾರವು ವಿಶ್ವಸಂಸ್ಥೆಯು ಅನುಮೋದಿತ ಮಕ್ಕಳ ಹಕ್ಕುಗಳ ಒಡಂಬಡಿಕೆಗೆ ೧೯೯೨ರ ಡಿಸೆಂಬರ್. ೧೧ ರಂದು ಒಪ್ಪಿ ಅನುಮೋದಿಸಿರುತ್ತದೆ. ಈ ಮಕ್ಕಳ ಹಕ್ಕುಗಳ ಒಡಂಬಡಿಕೆ ಹಾಗೂ ಮಕ್ಕಳ ನ್ಯಾಯ (ಮಕ್ಕಳ ಪೋಷಣೆ ಮತ್ತು ರಕ್ಷಣೆ ಕಾಯ್ದೆ)-೨೦೧೫ರನ್ವಯ ೧೮ ವರ್ಷದೊಳಗಿನ ಎಲ್ಲಾ ಮಾನವಜೀವಿಗಳು ಮಕ್ಕಳು ಎಂದು ಪರಿಗಣಿತವಾಗಿದೆ. ಮಕ್ಕಳ ಹಕ್ಕುಗಳ ಒಡಂಬಡಿಕೆಯ ಕಲಂ ೩೨ ಮತ್ತು ೩೬ರಲ್ಲಿ ಮಕ್ಕಳ ಆರೋಗ್ಯ ಮತ್ತು ಶಿಕ್ಷಣಕ್ಕೆ ಅಪಾಯಕಾರಿಯಾದ ಕ್ಷೇತ್ರಗಳಲ್ಲಿ, ಮಕ್ಕಳು ಕಾರ್ಯನಿರ್ವಹಿಸದಂತೆ ಹಾಗೂ ಮಕ್ಕಳ ಬೆಳವಣೆಗೆಗೆ ತೊಡಕನ್ನುಂಟು ಮಾಡುವ ಯಾವುದೇ ಚಟುವಟಿಕೆಯಲ್ಲಿ ಮಕ್ಕಳು ಭಾಗವಹಿಸದಂತೆ ಸೂಕ್ತ ಕ್ರಮಗಳನ್ನು ಕೈಗೊಳ್ಳಲು ನಿರ್ದೇಶಿಸಿರುತ್ತದೆ. ಅಧ್ಯಕ್ಷರು, ರಾಷ್ಟ್ರೀಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ, ನವದೆಹಲಿ ರವರು ‘ಚುನಾವಣಾ ಕಾರ್ಯಗಳಲ್ಲಿ ಮತ್ತು ಯಾವುದೇ ಪಕ್ಷಗಳು ತಮ್ಮ ಚುನಾವಣಾ ಪ್ರಚಾರ ಕಾರ್ಯದಲ್ಲಿ ೧೮ ವರ್ಷದೊಳಗಿನ ಮಕ್ಕಳನ್ನು ಬಳಸಿಕೊಳ್ಳದಂತೆ ಅಗತ್ಯ ಸೂಕ್ತ ಕ್ರಮಗಳನ್ನು ಕೈಗೊಳ್ಳಲು ಕೋರಿದ್ದು, ಚುನಾವಣಾಧಿಕಾರಿಗಳು, ಮುಖ್ಯ ಚುನಾವಣಾಧಿಕಾರಿಗಳ ಕಾರ್ಯಾಲಯ, ನವದೆಹಲಿರವರು, ಈ ಕುರಿತು ಸೂಕ್ತ ಕ್ರಮಗಳನ್ನು ಕೈಗೊಳ್ಳಲು ಸೂಚಿಸಿದ್ದಾರೆ.
ಅಲ್ಲದೇ ಬಾಲ ಕಾರ್ಮಿಕ ಪದ್ಧತಿ ನಿಷೇಧ ಮತ್ತು ಹದಿ ಹರೆಯದ ಮಕ್ಕಳ ದುಡಿಮೆ ನಿಯಂತ್ರಣ ತಿದ್ದುಪಡಿ ಕಾಯ್ದೆ-೨೦೧೬ ಅನ್ವಯ ೧೪ ವರ್ಷದೊಳಗಿನ ಮಕ್ಕಳು ಯಾವುದೇ ದುಡಿಮೆ ಕಾರ್ಯದಲ್ಲಿ ಅಥವಾ ದುಡಿಮೆ ಚಟುವಟಿಕೆಗಳಲ್ಲಿ ಮಕ್ಕಳನ್ನು ಬಳಸಿಕೊಳ್ಳುವದನ್ನು ನಿಷೇಧಿಸಿದೆ ಮತ್ತು ೧೮ ವರ್ಷದೊಳಗಿನ ಮಕ್ಕಳು ಅಪಾಯಕಾರಿ ಕ್ಷೇತ್ರಗಳಲ್ಲಿ ಕಾರ್ಯನಿರ್ವಹಿಸುವದನ್ನು ನಿಷೇಧಿಸಿದೆ. ಒಂದು ವೇಳೆ ಈ ಕಾಯ್ದೆಯನ್ನು ಉಲ್ಲಂಘಿಸಿ ಮಕ್ಕಳನ್ನು ಕೆಲಸ ಅಥವಾ ಇನ್ನಾವುದೇ ಕಾರ್ಯಗಳಲ್ಲಿ ನೇಮಿಸಿಕೊಂಡಲ್ಲಿ ಕಲಂ ೧೪ರಡಿಯಲ್ಲಿ ಎರಡು ವರ್ಷದವರೆಗೆ ವಿಸ್ತರಿಸಬಹುದಾದ ಜೈಲು ಶಿಕ್ಷೆ ಮತ್ತು ರೂ. ೫೦ ಸಾವಿರ ದಂಡವನ್ನು ವಿಧಿಸಬಹುದಾಗಿದೆ. ಆದ್ದರಿಂದ ಯಾವುದೇ ಚುನಾವಣಾ ಕಾರ್ಯಗಳಲ್ಲಿ ಹಾಗೂ ಯಾವುದೇ ರಾಜಕೀಯ ಪಕ್ಷಗಳು ತಮ್ಮ ಚುನಾವಣಾ ಪ್ರಚಾರ ಕಾರ್ಯಗಳಲ್ಲಿ ಮಕ್ಕಳನ್ನು ಬಳಸಿಕೊಳ್ಳುವುದನ್ನು ನಿಷೇಧಿಸಲಾಗಿದೆ. ಒಂದು ವೇಳೆ ಯಾರಾದರೂ ಈ ರೀತಿಯ ಕಾರ್ಯಗಳಲ್ಲಿ ೧೮ ವರ್ಷದೊಳಗಿನ ಮಕ್ಕಳನ್ನು ಬಳಸಿಕೊಂಡಲ್ಲಿ, ಕಾಯ್ದೆಗಳನ್ವಯ ಸೂಕ್ತ ಶಿಸ್ತಿನ ಕ್ರಮ ಜರುಗಿಸಲಾಗುವದು ಎಂದು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಪಿ. ಸುನೀಲ್ ಕುಮಾರ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Please follow and like us:
error