ಮತದಾರರ ಪಟ್ಟಿ ಪರಿಷ್ಕರಣೆ-2021 : ಅಧಿಕಾರಿಗಳು ದಾಖಲೆಗಳನ್ನು ಸರಿಯಾಗಿ ಇಟ್ಟುಕೊಳ್ಳಿ : ವಿ.ರಶ್ಮಿ ಮಹೇಶ್

ಕೊಪ್ಪಳ   ಮತದಾರರ ಪಟ್ಟಿ ಪರಿಷ್ಕರಣೆಗೆ ಸಂಬAಧಿಸಿದ ಎಲ್ಲಾ ದಾಖಲೆಗಳನ್ನು ಅಧಿಕಾರಿಗಳು ಸರಿಯಾಗಿ ಇಟ್ಟುಕೊಳ್ಳಬೇಕು. ರಾಜಕೀಯ ಪಕ್ಷಗಳು ಅಥವಾ ಇತರೆ ಯಾರೇ ಕೇಳಿದರೂ ಅವರಿಗೆ ಮಾಹಿತಿ ನೀಡಲು ಅನುಕೂಲವಾಗುವಂತೆ ವ್ಯವಸ್ಥಿತ ದಾಖಲೆಗಳನ್ನು ಸಿದ್ಧಪಡಿಸಿ ಇಟ್ಟುಕೊಳ್ಳಬೇಕು ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಕಾರ್ಯದರ್ಶಿಗಳು ಹಾಗೂ ಕೊಪ್ಪಳ ಜಿಲ್ಲೆಯ ಉಸ್ತುವಾರಿ ಕಾರ್ಯದರ್ಶಿಗಳು ಹಾಗೂ ಮತದಾರರ ಪಟ್ಟಿ ವೀಕ್ಷಕರಾದ ವಿ.ರಶ್ಮಿ ಮಹೇಶ್ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಸೋಮವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಮತದಾರರ ಪಟ್ಟಿ ಪರಿಷ್ಕರಣೆ-2021ರ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಮತದಾರರ ಪಟ್ಟಿಗೆ ಹೊಸದಾಗಿ ಹೆಸರು ಸೇರ್ಪಡೆ ಮಾಡುವಾಗ ಅಗತ್ಯ ದಾಖಲೆಗಳನ್ನು ಕೂಲಂಕಷವಾಗಿ ಪರಿಶೀಲಿಸಿ ಅರ್ಹರನ್ನು ಪಟ್ಟಿಗೆ ಸೇರಿಸಿ. ಮೃತಪಟ್ಟವರನ್ನು ಮತದಾರರ ಪಟ್ಟಿಯಿಂದ ತೆಗೆದು ಹಾಕಿ. ವಯಸ್ಕ ಮತದಾರರಲ್ಲಿ ಮತದಾನದ ಮಹತ್ವದ ಕುರಿತು ಅರಿವು ಮೂಡಿಸಿ. ಕ್ಷೇತ್ರವಾರು ಮತದಾರರ ಬಗೆಗಿನ ಮಾಹಿತಿಯನ್ನು ಸಮರ್ಪಕವಾಗಿ ಪಡೆಯಿರಿ. ಮತದಾನದ ಚೀಟಿ ನೀಡುವಲ್ಲಿ ಯಾವುದೇ ಲೋಪಗಳಿಗೆ ಅವಕಾಶ ನೀಡಬಾರದು. ಮತದಾರರ ಪಟ್ಟಿಗೆ ಹೆಸರು ಸೇರ್ಪಡೆ ಅಥವಾ ಹೆಸರು ತೆಗೆದು ಹಾಕುವಾಗ ಎಚ್ಚರಿಕೆಯಿಂದ ಕಾರ್ಯನಿರ್ವಹಿಸಿ. ಕಣ್ತಪ್ಪಿನಿಂದ ಆಗುವ ಸಣ್ಣ ಲೋಪದೋಷಗಳು ಮುಂದಿನ ದಿನಗಳಲ್ಲಿ ಗಂಭೀರ ಪರಿಣಾಮವನ್ನು ಉಂಡುಮಾಡಬಹುದು. ಆದ್ದರಿಂದ ಸಾರ್ವಜನಿಕರು, ಗಣ್ಯ ವ್ಯಕ್ತಿಗಳು, ವಲಸೆ ಕಾರ್ಮಿಕರು ಮುಂತಾದ ಎಲ್ಲರ ದಾಖಲೆಗಳನ್ನು ಪರಿಶೀಲಿಸದಿ ನಂತರವೇ ಮತದಾರರ ಪಟ್ಟಿ ಪರಿಷ್ಕರಿಸಬೇಕು. ಈ ಬಗ್ಗೆ ಯಾರಿಂದ ಪ್ರಶ್ನೆ ಎದುರಾದರೂ ಉತ್ತರಿಸಲು ಅಧಿಕಾರಿಗಳು ಸೂಕ್ತ ದಾಖಲೆಗಳನ್ನು ಹೊಂದಿರಬೇಕು. ಚುನಾವಣೆ ಹಾಗೂ ಮತದಾರರ ಪಟ್ಟಿ ಪರಿಷ್ಕರಣೆ ಮಹತ್ವದ, ಜವಾಬ್ದಾರಿಯುತ ಕರ್ತವ್ಯವಾಗಿದ್ದು, ಅಧಿಕಾರಿಗಳು ಬೇಜವಾಬ್ದಾರಿಯಿಂದ ವರ್ತಿಸದೆ ಎಚ್ಚರಿಕೆಯಿಂದ ಕಾರ್ಯನಿರ್ವಹಿಸಬೇಕು ಎಂದು ಅವರು ಸಲಹೆ ನೀಡಿದರು.
ಜಿಲ್ಲೆಯಲ್ಲಿ ಇನ್ನೂ ಮತದಾರರ ಪಟ್ಟಿಗೆ ಸೇರದ ಅರ್ಹ ವಯಸ್ಕರ ಸಂಖ್ಯೆ ಹೆಚ್ಚಿನ ಪ್ರಮಾಣದಲ್ಲಿದೆ. ಅವರನ್ನು ಮತದಾರರ ಪಟ್ಟಿಗೆ ಸೇರಿಸುವ ನಿಟ್ಟಿನಲ್ಲಿ ಕಾರ್ಯ ಪ್ರವೃತ್ತರಾಗಿ. ಸೂಕ್ತ ದಾಖಲೆಗಳ ಅನ್ವಯ ಮತದಾರರ ಚೀಟಿಯನ್ನು ಹಂಚುವ ಕೆಲಸವಾಗಲಿ ಎಂದು ಅಧಿಕಾರಿಗಳಿಗೆ ತಿಳಿಸಿದರು.
ನಂತರ ಅವರು ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯದಲ್ಲಿ ಸ್ವೀಕೃತವಾದ ಅರ್ಜಿಗಳ ವಿಲೇವಾರಿ ಬಗ್ಗೆ ಪರಿಶೀಲಿಸಿದರು.
ಸಭೆಯಲ್ಲಿ ಜಿಲ್ಲಾಧಿಕಾರಿಗಳಾದ ವಿಕಾಸ್ ಕಿಶೋರ್ ಸುರಳ್ಕರ್, ಅಪರ ಜಿಲ್ಲಾಧಿಕಾರಿಗಳಾದ ಎಂ.ಪಿ.ಮಾರುತಿ, ಸಹಾಯಕ ಅಯುಕ್ತರಾದ ನಾರಾಯಣರೆಡ್ಡಿ ಕನಕರೆಡ್ಡಿ ಹಾಗೂ ಮತದಾರರ ನೋಂದಾಣಾಧಿಕಾರಿಗಳು, ಕೊಪ್ಪಳ ಜಿಲ್ಲೆಯ ಎಲ್ಲಾ ತಾಲ್ಲೂಕಿನ ತಹಶೀಲ್ದಾರರು ಹಾಗೂ ಚುನಾವಣಾ ಶಾಖಾ ಸಿಬ್ಬಂದಿ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.
ಮತಗಟ್ಟೆಗಳಿಗೆ ಭೇಟಿ:
ಮತದಾರರ ಪಟ್ಟಿ ವೀಕ್ಷಕರಾದ ವಿ.ರಶ್ಮಿ ಮಹೇಶ ಅವರು ಸೋಮವಾರದಂದು 64-ಕೊಪ್ಪಳ ವಿಧಾನಸಭಾ ಕ್ಷೇತ್ರದ ಗಿಣಿಗೇರಾ ಗ್ರಾಮದ ಮತಗಟ್ಟೆ ಸಂಖ್ಯೆ:215 ಮತ್ತು 216, 62-ವಿಧಾನಸಭಾ ಕ್ಷೇತ್ರದ ಬಸಾಪಟ್ಟಣ ಗ್ರಾಮದ ಮತಗಟ್ಟೆ ಸಂಖ್ಯೆ:98, 102 ಮತ್ತು ವಡ್ಡರಹಟ್ಟಿ ಗ್ರಾಮದ ಮತಗಟ್ಟೆ ಸಂ:111 ರ ವ್ಯಾಪ್ತಿಯಲ್ಲಿ ದಿಢೀರ್ ಭೇಟಿ ನೀಡಿ ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯವನ್ನು ಪರಿಶೀಲಿಸಿದರು.

Please follow and like us:
error