ಅರ್ಥಪೂರ್ಣವಾಗಿ ಕನ್ನಡ ರಾಜ್ಯೋತ್ಸವ ಆಚರಣೆ : ಸಿ.ಡಿ. ಗೀತಾ

ಕೊಪ್ಪಳ ಅ.  :  ಪ್ರತಿ ವರ್ಷದಂತೆ ಈ ವರ್ಷ ಕೂಡ ಕೊಪ್ಪಳ ಜಿಲ್ಲೆಯಲ್ಲಿ ಅದ್ಧೂರಿಯಾಗಿ ಹಾಗೂ ಅರ್ಥಪೂರ್ಣವಾಗಿ ಕನ್ನಡ ರಾಜ್ಯೋತ್ಸವನ್ನು ಆಚರಿಸಲಾಗುವುದು ಎಂದು ಅಪರ ಜಿಲ್ಲಾಧಿಕಾರಿ ಸಿ.ಡಿ. ಗೀತಾ ಅವರು ಹೇಳಿದರು.
ಕರ್ನಾಟಕ ರಾಜ್ಯೋತ್ಸವ ಆಚರಣೆ ಕುರಿತು ಸೋಮವಾರದಂದು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಏರ್ಪಡಿಸಲಾದ ಪೂರ್ವ ಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಪ್ರತಿ ವರ್ಷದಂತೆ ಈ ವರ್ಷವೂ ಕನ್ನಡ ರಾಜ್ಯೋತ್ಸವವನ್ನು ಅತ್ಯಂತ ಸಡಗರ ಸಂಭ್ರಮದಿಂದ ಆಚರಿಸಲಾಗುವುದು. ರಾಜ್ಯೋತ್ಸವದ ಅಂಗವಾಗಿ ನವೆಂಬರ್ ೦೧ ರಂದು ಬೆಳಿಗ್ಗೆ ೭-೩೦ ಗಂಟೆಗೆ ಕನ್ನಡ ತಾಯಿ ಭುವನೇಶ್ವರಿ ದೇವಿ ಭಾವಚಿತ್ರದೊಂದಿಗೆ ಅದ್ಧೂರಿ ಮೆರವಣಿಗೆ ತಹಶಿಲ್ದಾರರ ಕಚೇರಿಯಿಂದ ಹೊರಡಲಿದೆ. ಮೆರವಣಿಗೆಯಲ್ಲಿ ವಿವಿಧ ಜಾನಪದ ಕಲಾ ತಂಡಗಳು ಭಾಗವಹಿಸಲಿದ್ದು, ಎಲ್ಲ ಇಲಾಖಾ ಅಧಿಕಾರಿ, ಸಿಬ್ಬಂದಿಗಳು ಮೆರವಣಿಗೆಯಲ್ಲಿ ಕಡ್ಡಾಯವಾಗಿ ಪಾಲ್ಗೊಳ್ಳಬೇಕು. ನ. ೦೧ ರಂದು ಬೆಳಿಗ್ಗೆ ೯ ಗಂಟೆಗೆ ಜಿಲ್ಲಾ ಕ್ರೀಡಾಂಗಣದಲ್ಲಿ ಧ್ವಜಾರೋಹಣ ಕಾರ್ಯಕ್ರಮ ಏರ್ಪಡಿಸಿದ್ದು, ಜಿಲ್ಲಾ ಉಸ್ತುವಾರಿ ಸಚಿವರು ಧ್ವಜಾರೋಹಣ ನೆರವೇರಿಸುವರು. ಕಾರ್ಯಕ್ರಮದಲ್ಲಿ ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿ ಸೇವೆಸಲ್ಲಿಸಿದ ಸಾಹಿತಿಗಳನ್ನು ಸನ್ಮಾನಿಸಲಾಗುವುದು. ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಕನ್ನಡ ವಿಷಯದಲ್ಲಿ ಅತಿ ಹೆಚ್ಚು ಅಂಕಗಳಿಸಿರುವ ವಿದ್ಯಾರ್ಥಿಗಳಿ ಬಹುಮಾನ ವಿತರಿಸಲಾಗುವುದು. ಅತೀ ಹೆಚ್ಚು ಅಂಕಗಳಿಸಿದ ಪೈಕಿ “ಜಿಲ್ಲೆಯ ಟಾಪ್-೩” ಮೂರು ವಿದ್ಯಾರ್ಥಿಗಳಿಗೆ ಸಾರ್ವಜನಿಕ ಶಿಕ್ಷಣ ಇಲಾಖೆ ವತಿಯಿಂದ ಲ್ಯಾಪ್‌ಟ್ಯಾಪ್ ವಿತರಿಸಲಾಗುವುದು. ಅಂದು ಜಿಲ್ಲಾ ಕ್ರೀಡಾಂಗಣಕ್ಕೆ ತೆರಳಲು ಶಾಲಾ ಮಕ್ಕಳಿಗೆ ಅನುಕೂಲವಾಗುವಂತೆ ಇನ್ನೂ ಹೆಚ್ಚಿನ ಸಂಖ್ಯೆಯಲ್ಲಿ ಬಸ್ ವ್ಯವಸ್ಥೆಯನ್ನು ಕಲ್ಪಿಸಬೇಕು. ಜಿಲ್ಲಾ ಕ್ರೀಡಾಂಗಣ ರಸ್ತೆ ಮೂಲಕವೇ ಹೊರಡುವ ಇತರೆ ಬಸ್‌ಗಳಲ್ಲಿ ಸಹ ಮಕ್ಕಳನ್ನು ಕ್ರೀಡಾಂಗಣದ ವರೆಗೆ ಕರೆದುಕೊಂಡು ಹೋಗುವಂತೆ ಕೆ.ಎಸ್.ಆರ್.ಟಿ.ಸಿ. ಸಂಸ್ಥೆಯವರು ಚಾಲಕರಿಗೆ ನಿರ್ದೆಶನವನ್ನು ನೀಡಬೇಕು. ಅಂದು ಸಂಜೆ ಸಾಹಿತ್ಯ ಭವನದಲ್ಲಿ ಕನ್ನಡ ಸಂಸ್ಕೃತಿಕ ಕಾರ್ಯಕ್ರಮಗಳು ಜರುಗಲಿವೆ. ರಾಜ್ಯೋತ್ಸವದ ಅಂಗವಾಗಿ ನ. ೦೧ ರಿಂದ ಏಳು ದಿನಗಳವರೆಗೆ ಜಿಲ್ಲೆಯ ಎಲ್ಲಾ ಚಿತ್ರಮಂದಿರಗಳಲ್ಲಿ ಕನ್ನಡ ಚಿತ್ರಗಳನ್ನೇ ಪ್ರದರ್ಶಿಸಲು ಸಂಬಂಧಪಟ್ಟ ಚಿತ್ರಮಂದಿರಗಳ ಮಾಲಿಕರುಗಳಿಗೆ ಸೂಚನೆ ನೀಡಲಾಗುವುದು. ರಾಜ್ಯೋತ್ಸವದ ಹಿಂದಿನ ದಿನ ನಗರದ ಪ್ರಮುಖ ರಸ್ತೆ ಮತ್ತು ಜಿಲ್ಲಾ ಕ್ರೀಡಾಂಗಣ ಹಾಗೂ ಸಾಹಿತ್ಯ ಭವನವನ್ನು ಸ್ವಚ್ಛಗೊಳಿಸುವಂತೆ ಅಪರ ಜಿಲ್ಲಾಧಿಕಾರಿ ಸಿ.ಡಿ. ಗೀತಾ ಅವರು ನಗರಸಭೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಸಭೆಯಲ್ಲಿ ಉಪಸ್ಥಿತರಿದ್ದ ಶಿವಾನಂದ ಹೊದ್ಲೂರ ಮಾತನಾಡಿ, ಧ್ವಜಾ ರೋಹಣದ ನಂತರ ನಡೆಯುವ ಪಥಸಂಚಲನದಲ್ಲಿ ಉತ್ತಮ ಪ್ರದರ್ಶನ ನೀಡಿದ ಮೂರು ತಂಡಗಳಿಗೆ ಬಹುಮಾನವನ್ನು ನೀಡಲಾಗುತ್ತಿದ್ದು, ಬಹುಮಾನವು ನೇರವಾಗಿ ಶಾಲೆಗೆ ಹೋಗುತ್ತದೆ. ನೆನಪಿನಕಾಣಿಕೆಯೊಂದಿಗೆ ವಿಜೇತ ತಂಡಗಳ ಎಲ್ಲ ವಿದ್ಯಾರ್ಥಿಗಳಿಗೆ ಪ್ರಶಸ್ತಿ ಪತ್ರವನ್ನು ನೀಡುವ ವ್ಯವಸ್ಥೆಯಾಗಬೇಕು. ಇದರಿಂದ ಭವಿಷ್ಯದಲ್ಲಿ ಅವರಿಗೆ ತುಂಬಾ ಅನುಕೂಲವಾಗಲಿದೆ. ಸಮಾರಂಭದ ದಿನದಂದು ಕ್ರೀಡಾಂಗಣದಲ್ಲಿ ಒಂದು ಅಂಬುಲೆನ್ಸ್ ವ್ಯವಸ್ಥೆಯನ್ನು ಮಾಡಬೇಕು. ಎಲ್ಲರಿಗೂ ಅಗತ್ಯ ಕುಡಿಯುವ ನೀರಿನ ಸೌಲಭ್ಯವನ್ನು ಒದಗಿಸಬೇಕು ಎಂದು ಸಲಹೆ ನೀಡಿದರು.
ಮಂಜುನಾಥ ಗೊಂಡಬಾಳ ಮಾತನಾಡಿ ಜಿಲ್ಲೆಯ ಕೆಲ ಅಂಗಡಿಗಳಲ್ಲಿ ಕನ್ನಡ ಭಾಷೆಯ ನಾಮಫಲಕಗಳೇ ಇಲ್ಲ. ಈ ಕುರಿತು ಜಿಲ್ಲಾಡಳಿತದ ವತಿಯಿಂದ ಕನ್ನಡದಲ್ಲಿ ನಾಮಫಲಕ ಕಡ್ಡಾಯ ಎಂಬ ಆದೇಶವನ್ನು ನೀಡಬೇಕು ಎಂದು ಸಲಹೆ ನೀಡಿದರು. ಇದಕ್ಕೆ ಪ್ರತಿಕ್ರೀಯಿಸಿದ ಅಪರ ಜಿಲ್ಲಾಧಿಕಾರಿಗಳು ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದರು.
ಸಭೆಯಲ್ಲಿ ಜಿಲ್ಲಾ ಸಂಖ್ಯಾ ಸಂಗ್ರಹಣಾಧಿಕಾರಿ ಕೃಷ್ಣಮೂರ್ತಿ ದೇಸಾಯಿ, ಜಿಲ್ಲಾಧಿಕಾರಿ ಕಚೇರಿಯ ಸಲಿಂ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ನಗರಾಭಿವೃದ್ಧಿ ಪ್ರಾಧಿಕಾರದ ಸದಸ್ಯ ನಾಗರಾಜ ಬಳ್ಳಾರಿ ಮತ್ತಿತರರು ಉಪಸ್ಥಿತರಿದರು.

Please follow and like us:
error