ಎಸ್.ಎಸ್.ಎಲ್.ಸಿ ಪರೀಕ್ಷೆವಿದ್ಯಾರ್ಥಿಗಳಿಗೆ ತೊಂದರೆ ಆಗದಂತೆ ರೂಟ್ ಮ್ಯಾಪ್ ರಚಿಸಿ ಸಾರಿಗೆ ವ್ಯವಸ್ಥೆ ಕಲ್ಪಿಸಿ: ಪಿ. ಸುನೀಲ್ ಕುಮಾರ್


ಕೊಪ್ಪಳ,  : ಎಸ್.ಎಸ್.ಎಲ್.ಸಿ ಪರೀಕ್ಷೆಗೆ ಜಿಲ್ಲೆಯ ವಿವಿಧ ಭಾಗಗಳಿಂದ ವಿದ್ಯಾರ್ಥಿಗಳು ಪರೀಕ್ಷಾ ಕೇಂದ್ರಗಳಿಗೆ ಆಗಮಿಸಲಿದ್ದು, ಅವರಿಗೆ ಸಾರಿಗೆ ವ್ಯವಸ್ಥೆಯಲ್ಲಿ ಯಾವುದೇ ವ್ಯತ್ಯಯವಾಗದಂತೆ ರೂಟ್ ಮ್ಯಾಪ್ ರಚಿಸಿ ಸಾರಿಗೆ ವ್ಯವಸ್ಥೆ ಕಲ್ಪಿಸಿ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಪಿ. ಸುನೀಲ್ ಕುಮಾರ್ ಸೂಚನೆ ನೀಡಿದರು.
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಇಂದು 2019-20 ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳ ಸುರಕ್ಷತಾ ಹಿತದೃಷ್ಠಿಯಿಂದ ಸೂಕ್ತ ಸಾರಿಗೆ ವ್ಯವಸ್ಥೆ ಕಲ್ಪಿಸುವ ಕುರಿತು ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಜಿಲ್ಲೆಯ ಪ್ರತಿ ಗ್ರಾಮದಲ್ಲಿನ ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳನ್ನು ಪರೀಕ್ಷಾ ಕೇಂದ್ರಗಳಿಗೆ ತಲುಪಿಸುವುದು ಶಿಕ್ಷಣ ಇಲಾಖೆ ಜವಾಬ್ದಾರಿಯಾಗಿರುವುದರಿಂದ ಪ್ರತಿ ಗ್ರಾಮದಿಂದ ವಿದ್ಯಾರ್ಥಿಗಳನ್ನು ಕರೆದೊಯ್ಯಲು ಬೆಳಗ್ಗೆ 07 ಗಂಟೆಗೆ ಸಾರ್ವಜನಿಕ ಸಾರಿಗೆ ಬಸ್‌ಗಳು ಸಿದ್ಧವಿರಬೇಕು. ಆ ಮಾರ್ಗವಾಗಿ ಪರೀಕ್ಷಾ ಕೇಂದ್ರದವರೆಗೆ ಬರುವ ಎಲ್ಲ ಗ್ರಾಮ, ಬಸ್ ನಿಲ್ದಾಣಗಳಿಂದ ವಿದ್ಯಾರ್ಥಿಗಳು ಪರೀಕ್ಷಾ ಪ್ರವೇಶ ಪತ್ರವನ್ನು ತೋರಿಸಿ ಬಸ್‌ನಲ್ಲಿ ಪ್ರಯಾಣಿಸಬಹುದು. ಪ್ರತಿ ಗ್ರಾಮದ ಪ್ರಾಥಮಿಕ ಶಾಲಾ ಮುಖ್ಯೋಪಾಧ್ಯಾಯರನ್ನು ವಿದ್ಯಾರ್ಥಿಗಳನ್ನು ಕರೆದೊಯ್ಯುವ ಬಸ್‌ಗಳಿಗೆ ನೋಡಲ್ ಅಧಿಕಾರಿಗಳನ್ನಾಗಿ ನಿಯೋಜಿಸಲಾಗಿದ್ದು, ತಮ್ಮ ಗ್ರಾಮದ ವಿದ್ಯಾರ್ಥಿಗಳ ಕುರಿತು ಸಂಪೂರ್ಣ ಮಾಹಿತಿ ಅವರಿಗಿರಬೇಕು. ಬೆಳಗ್ಗೆ 08.30 ಗಂಟೆಗೆ ವಿದ್ಯಾರ್ಥಿಗಳು ಪರೀಕ್ಷಾ ಕೇಂದ್ರ ತಲುಪುವಂತೆ ಅಚ್ಚುಕಟ್ಟು ವ್ಯವಸ್ಥೆ ಮಾಡಬೇಕು. ಅವಶ್ಯವಿದ್ದಲ್ಲಿ ಖಾಸಗಿ ಶಾಲಾ ಬಸ್‌ಗಳನ್ನು ಬಳಸಿಕೊಳ್ಳಬಹುದು. ಮುಂಜಾಗ್ರತಾ ಕ್ರಮವಾಗಿ ಹೆಚ್ಚುವರಿಯಾಗಿ ಸಾರ್ವಜನಿಕ ಸಾರಿಗೆ ಬಸ್‌ಗಳನ್ನು ಕಾಯ್ದಿರಿಸಿಕೊಳ್ಳಬೇಕು ಎಂದು ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಪರೀಕ್ಷಾ ಕೇಂದ್ರಗಳಲ್ಲಿ ಈ ಹಿಂದೆ ಚರ್ಚಿಸಿದಂತೆ ವಿದ್ಯಾರ್ಥಿಗಳ ಆರೋಗ್ಯ ತಪಾಸಣೆ, ಸಾಮಾಜಿಕ ಅಂತರ ಕಾಪಾಡಿಕೊಳ್ಳುವುದು, ಅನಾರೋಗ್ಯ ಪೀಡಿತ, ಕಂಟೈನ್‌ಮೆAಟ್ ಅಥವಾ ಹೊರ ರಾಜ್ಯದಿಂದ ಬರುವ ವಿದ್ಯಾರ್ಥಿಗಳಿಗೆ ಪ್ರತ್ಯೇಕ ಕೊಠಡಿ ವ್ಯವಸ್ಥೆಯನ್ನು ಮಾಡಬೇಕು ಎಂದು ಅವರು ಹೇಳಿದರು.
ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ದೊಡ್ಡಬಸಪ್ಪ ನೀರಲಕೇರಿ ಮಾತನಾಡಿ,  ಪರೀಕ್ಷಾ ಕೇಂದ್ರಗಳಿರುವ ಜಿಲ್ಲೆಯ ನಾಲ್ಕು ತಾಲ್ಲೂಕುಗಳಲ್ಲಿ 198 ಕೆ.ಎಸ್.ಆರ್.ಟಿ.ಸಿ ಬಸ್‌ಗಳಲ್ಲಿ 5136 ವಿದ್ಯಾರ್ಥಿಗಳನ್ನು, 79 ಖಾಸಗಿ ಬಸ್‌ಗಳಲ್ಲಿ 1941 ವಿದ್ಯಾರ್ಥಿಗಳನ್ನು ಪರೀಕ್ಷಾ ಕೇಂದ್ರಗಳಿಗೆ ಕರೆತರಲು ವ್ಯವಸ್ಥೆ ಮಾಡಲಾಗಿದೆ. 4803 ವಿದ್ಯಾರ್ಥಿಗಳು ಸೈಕಲ್ ಮೂಲಕ, 5793 ವಿದ್ಯಾರ್ಥಿಗಳು ಪಾಲಕರ ವಾಹನಗಳ ಮೂಲಕ, 2430 ವಿದ್ಯಾರ್ಥಿಗಳು ಕಾಲ್ನಡಿಗೆ(ಹತ್ತಿರದ ಪರೀಕ್ಷಾ ಕೇಂದ್ರಗಳಿಗೆ), 2080 ವಿದ್ಯಾರ್ಥಿಗಳು ವಸತಿ ನಿಲಯಗಳಿಂದ ಬಸ್‌ಗಳ ಮೂಲಕ ಪರೀಕ್ಷಾ ಕೇಂದ್ರಗಳಿಗೆ ಆಗಮಿಸುತ್ತಾರೆ. ಒಟ್ಟು 22183 ವಿದ್ಯಾರ್ಥಿಗಳು ಜಿಲ್ಲೆಯಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆ ಬರೆಯಲಿದ್ದಾರೆ ಎಂದು ಅವರು ಮಾಹಿತಿ ನೀಡಿದರು.
ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಎಂ.ಪಿ. ಮಾರುತಿ, ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಸಿದ್ರಾಮೇಶ್ವರ, ಡಿ.ವೈ.ಎಸ್‌ಪಿ ವೆಂಕಟಪ್ಪ ನಾಯಕ, ಜಿಲ್ಲಾ ಆರೋಗ್ಯಾಧಿಕಾರಿ ಡಾ.ಲಿಂಗರಾಜು, ಜಿಲ್ಲಾ ಶಸ್ತç ಚಿಕಿತ್ಸಕ ಡಾ.ಎಸ್.ಬಿ.ದಾನರೆಡ್ಡಿ ಸೇರಿದಂತೆ ಕ್ಷೇತ್ರ ಶಿಕ್ಷಣಾಧಿಕಾರಿಗಳು, ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

Please follow and like us:
error