ಕನ್ನಡದಲ್ಲಿ ವಿಜ್ಞಾನ ಮತ್ತು ತಂತ್ರಜ್ಞಾನ ಸಮ್ಮೇಳನ

ಕೊಪ್ಪಳ   ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿ ವತಿಯಿಂದ “ಕನ್ನಡದಲ್ಲಿ ವಿಜ್ಞಾನ ಮತ್ತು ತಂತ್ರಜ್ಞಾನ ಸಮ್ಮೇಳನ”ವನ್ನು ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಏರ್ಪಡಿಸಲಾಗಿದ್ದು, ಭಾಗವಹಿಸಲಿಚ್ಚೀಸುವರು ನ. ೧೦ ರೊಳಗೆ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಬೇಕು ಎಂದು ಅಕಾಡೆಮಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಎ.ಎಂ. ರಮೇಶ್ ಅವರು ತಿಳಿಸಿದ್ದಾರೆ.
ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿಯು ಕನ್ನಡದಲ್ಲಿ ವಿಜ್ಞಾನ ಮತ್ತು ತಂತ್ರಜ್ಞಾನ ಸಮ್ಮೇಳನವನ್ನು “ವಿಜ್ಞಾನ ಮತ್ತು ತಂತ್ರಜ್ಞಾನ ಸಂಶೋಧನೆ : ಕರ್ನಾಟಕದ ಕೊಡುಗೆ” ಎಂಬ ಕೇಂದ್ರ ವಿಷಯದಡಿ ನ. ೨೩ ಮತ್ತು ೨೪ ರಂದು ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದ ಸಹಯೋಗದೊಂದಿಗೆ ಧಾರವಾಡ ಕ.ವಿವಿ ಆವರಣದಲ್ಲಿರುವ ಸುವರ್ಣ ಮಹೋತ್ಸವ ಸಭಾಂಗಣದಲ್ಲಿ ಆಯೋಜಿಸುತ್ತಿದೆ. ಈ ಸಮ್ಮೇಳನದಲ್ಲಿ ಖ್ಯಾತ ಸಂಪನ್ಮೂಲ ತಜ್ಞರುಗಳಿಂದ ಬಾಹ್ಯಾಕಾಶ, ವಿದ್ಯುನ್ಮಾನ, ಕೃಷಿಯಲ್ಲಿ ಜೈವಿಕ ತಂತ್ರಜ್ಞಾನ, ಮಾಹಿತಿ ತಂತ್ರಜ್ಞಾನ ಮತ್ತು ಆರೋಗ್ಯಕ್ಕೆ ಸಂಭಧಿಸಿದ ವಿಷಯಗಳ ಬಗ್ಗೆ ವಿದ್ವತ್ ಪೂರ್ಣ ಉಪನ್ಯಾಸಗಳನ್ನು ಏರ್ಪಡಿಸಲಾಗುತ್ತಿದೆ.
ಸಮ್ಮೇಳನದಲ್ಲಿ ರಾಜ್ಯದ ವಿವಿಧ ವಿಶ್ವವಿದ್ಯಾನಿಲಯಗಳ ಸ್ನಾತಕೋತ್ತರ/ ಸಂಶೋಧನಾ ವಿದ್ಯಾರ್ಥಿಗಳು, ಉಪನ್ಯಾಸಕರು/ ಪ್ರಾಧ್ಯಾಪಕರುಗಳು, ವಿಜ್ಞಾನಿಗಳು, ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ವಿಜ್ಞಾನಾಸಕ್ತರು ಒಳಗೊಂಡಂತೆ ಸುಮಾರು ೧೦೦೦ ಪ್ರತಿನಿಧಿಗಳು ಭಾಗವಹಿಸಲಿದ್ದಾರೆ. ಅಲ್ಲದೇ, ಪ್ರತಿನಿಧಿಗಳು ತಮ್ಮ ಸಂಶೋಧನಾ ಫಲಿತಾಂಶಗಳನ್ನು ಕನ್ನಡದಲ್ಲಿ ಪ್ರಾತ್ಯಕ್ಷಿಕೆಗಳ ಮೂಲಕ ಪ್ರಸ್ತುತಪಡಿಸಲು ಸಮ್ಮೇಳನದಲ್ಲಿ ಅವಕಾಶ ಕಲ್ಪಿಸಲಾಗಿದ್ದು, ಮೂಲ ಮತ್ತು ಅನ್ವಯಿಕ ವಿಜ್ಞಾನಗಳಿಗೆ ಸಂಬಂಧಿಸಿದ ಯಾವುದೇ ವಿಷಯದ ಪ್ರಾತ್ಯಕ್ಷಿಕೆಗಳನ್ನು ಮಂಡಿಸಬಹುದಾಗಿದೆ. ತಜ್ಞ ಸಮಿತಿಯು ಆಯ್ಕೆ ಮಾಡುವ ಮೂರು ಅತ್ಯುತ್ತಮ ಪ್ರಾತ್ಯಕ್ಷಿಕೆಗಳಿಗೆ ನಗದು ಬಹುಮಾನವನ್ನು ನೀಡಲಾಗುವುದು.
ಸಮ್ಮೇಳನಕ್ಕೆ ಪ್ರತಿನಿಧಿಗಳಾಗಿ ನೋಂದಾಯಿಸಿಕೊಳ್ಳಲು ಹಾಗೂ ಸಂಶೋಧನಾ ಪ್ರಸ್ತುತಿಯ ಸಾರಾಂಶವನ್ನು ಕಳುಹಿಸಲು ನ. ೧೦ ಕೊನೆಯ ದಿನವಾಗಿದ್ದು, ಹೆಚ್ಚಿನ ವಿವರಗಳನ್ನು ಅಕಾಡೆಮಿಯ ಹಾಗೂ ವಿಶ್ವವಿದ್ಯಾಲಯದ ವೆಬ್‌ಸೈಟ್ www.kstacademy.in & www.dharwadsciencecentre.orgಗಳಲ್ಲಿ ಪಡೆಯಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.

Please follow and like us:
error