ಕೊಪ್ಪಳ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಸುರಳ್ಕರ್ ವಿಕಾಸ್ ಕಿಶೋರ್ ಅಧಿಕಾರ ಸ್ವೀಕಾರ


ಕೊಪ್ಪಳ :  ಕೊಪ್ಪಳ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಸುರಳ್ಕರ್ ವಿಕಾಸ್ ಕಿಶೋರ್ ಅವರು ಬುಧವಾರ(ಜುಲೈ 01) ಅಧಿಕಾರ ಸ್ವೀಕಾರ ಮಾಡಿದರು.
ಅಧಿಕಾರ ಸ್ವೀಕಾರದ ನಂತರ ಜಿಲ್ಲಾಡಳಿತ ಸಭಾಂಗಣದಲ್ಲಿ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿ, ನಾನು 2012ನೇ ಸಾಲಿನ ಐಎಎಸ್ ಬ್ಯಾಚಿನ ಅಧಿಕಾರಿಯಾಗಿದ್ದು, ಈ ಹಿಂದೆ ಬೆಂಗಳೂರಿನ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕರಾಗಿ ಸೇವೆ ಸಲ್ಲಿಸಿದ್ದೇನೆ.
ಸರ್ಕಾರದ ಆದೇಶದ ಮೇರೆಗೆ ಕೊಪ್ಪಳ ಜಿಲ್ಲೆಯ ಜಿಲ್ಲಾಧಿಕಾರಿಯಾಗಿ ಸೇವೆ ಸಲ್ಲಿಸುವ ಅವಕಾಶ ಒದಗಿ ಬಂದಿದ್ದು, ಇದೇ ಮೊದಲ ಬಾರಿಗೆ ಜಿಲ್ಲಾಧಿಕಾರಿಯಾಗಿ ಕಾರ್ಯನಿರ್ವಹಿಸಲಿದ್ದೇನೆ. ಮೂಲತಃ ಮಹರಾಷ್ಟçದವನಾಗಿದ್ದು, ಈ ಹಿಂದೆ ವಿಜಯಪುರ ಮತ್ತು ಬಾಗಲಕೋಟೆ ಜಿಲ್ಲೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯಾಗಿ ಸೇವೆ ಸಲ್ಲಿಸಿದ್ದೇನೆ ಎಂದು ಹೇಳಿದರು.
ದೇಶದ ಎಲ್ಲೆಡೆ ಕೋವಿಡ್-19 ಸೋಂಕು ಹರಡುತ್ತಿದ್ದು, ಜಿಲ್ಲೆಯಲ್ಲಿ ಕೋವಿಡ್-19 ತಡೆಗಟ್ಟುವುದೇ ನಮ್ಮ ಮುಂದಿರುವ ಮೊದಲ ಗುರಿಯಾಗಿದೆ. ಅದರಂತೆಯೇ ಇಂದು ಕೊಪ್ಪಳ ಜಿಲ್ಲೆಯಲ್ಲಿ 13 ಕೋವಿಡ್-19 ಪ್ರಕರಣಗಳು ದೃಢಪಟ್ಟಿದ್ದು ಅವುಗಳ ಮಾಹಿತಿ ಪಡೆಯಲಾಗಿದೆ. ಸೋಂಕಿತರ ಪ್ರಾಥಮಿಕ ಸಂಪರ್ಕದಲ್ಲಿದ್ದ 17 ಜನರ ಗಂಟಲು ದ್ರವವನ್ನು ಪರೀಕ್ಷೆಗೆ ಒಳಪಡಿಸಲಾಗುತ್ತದೆ. ಕೋವಿಡ್-19 ಕುರಿತು ಜಿಲ್ಲೆಯಲ್ಲಿ ಇನ್ನೂ ಹೆಚ್ಚಿನ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲಾಗುತ್ತದೆ ಎಂದು ಹೇಳಿದರು.
ಇಂದು ನಡೆದ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಕಾರಟಗಿ ಪರೀಕ್ಷಾ ಕೇಂದ್ರದಲ್ಲಿ ಒಬ್ಬ ವಿದ್ಯಾರ್ಥಿನಿಗೆ ಕೋವಿಡ್-19 ಸೋಂಕು ದೃಢಪಟ್ಟಿದ್ದು, ಚಿಕಿತ್ಸೆಗೆ ರಾಯಚೂರಿಗೆ ಕಳುಹಿಸಲಾಗಿದೆ. ಈ ಕುರಿತು ಸಂಬAಧಪಟ್ಟ ಮಾಹಿತಿಯನ್ನು ಅತಿ ಶೀಘ್ರದಲ್ಲೇ ತಿಳಿಸಲಾಗುತ್ತದೆ. ಜಿಲ್ಲೆಯ ಅಭಿವೃದ್ಧಿಗೆ ಎಲ್ಲಾ ಸಾರ್ವಜನಿಕರ ಮತ್ತು ಎಲ್ಲಾ ಸರ್ಕಾರಿ ಇಲಾಖೆ ಅಧಿಕಾರಿ, ಮಾಧ್ಯಮ ಮಿತ್ರರ ಸಹಾಯ, ಸಹಕಾರ ಅತ್ಯಗತ್ಯ ಎಂದು ಅವರು ಮಾಧ್ಯಮ ಪ್ರತಿನಿಧಿಗಳಿಗೆ ತಿಳಿಸಿದರು. ಈ ಸಂದರ್ಭ ಜಿಲ್ಲೆಯ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

Please follow and like us:
error