ಜುಲೈ. ೦೩ ರಿಂದ ಶಾಲೆ ಕಡೆ-ನನ್ನ ನಡೆ ಕಾರ್ಯಕ್ರಮ : ಅಗತ್ಯ ಸಿದ್ಧತೆಗೆ ಸೂಚನೆ

ಕೊಪ್ಪಳ ಜಿಲ್ಲೆಗೆ ಕಾನೂನು ರಥ
ಬಾಲ್ಯ ವಿವಾಹ, ಬಾಲಕಾರ್ಮಿಕ ಪದ್ಧತಿ ಹಾಗೂ ಶಾಲೆಯಿಂದ ಹೊರಗುಳಿದ ಮಕ್ಕಳು ಮುಂತಾದವುಗಳ ಬಗ್ಗೆ ಜಾಗೃತಿ ಮೂಡಿಸುವ ಉದ್ದೇಶದಿಂದ ಶಾಲೆ ಕಡೆ-ನನ್ನ ನಡೆ ಕಾರ್ಯಕ್ರಮವನ್ನು ಬಿಂಬಿಸುವ ಕಾನೂನು ರಥ ಜುಲೈ ೦೩ ರಿಂದ ಕೊಪ್ಪಳ ಜಿಲ್ಲೆಯಲ್ಲಿ ತನ್ನ ಸಂಚಾರವನ್ನು ಪ್ರಾರಂಭಿಸಲಿದ್ದು, ಕಾರ್ಯಕ್ರಮದ ಯಶಸ್ವಿಗೆ ಅಗತ್ಯ ಸಿದ್ಧತೆ ರೂಪಿಸುವಂತೆ ಕೊಪ್ಪಳ ಹಿರಿಯ ಸಿವಿಲ್ ನ್ಯಾಯಾಧೀಶರಾದ ಟಿ. ಶ್ರೀನಿವಾಸ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಜಿಲ್ಲೆಯಲ್ಲಿ ಶಾಲೆ ಕಡೆ-ನಮ್ಮ ನಡೆ ಹಾಗೂ ಕಾನೂನು ರಥ ಸಂಚಾರ ಕಾರ್ಯಕ್ರಮದ ಸಿದ್ಧತೆಗಾಗಿ ಕೊಪ್ಪಳ ಜಿಲ್ಲಾ ನ್ಯಾಯಾಲಯದ ಕಚೇರಿಯಲ್ಲಿ ಏರ್ಪಡಿಸಲಾಗಿದ್ದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ಸರ್ಕಾರದ ಸಹಯೋಗದಲ್ಲಿ ಬಾಲ್ಯ ವಿವಾಹ, ಬಾಲ ಕಾರ್ಮಿಕ ಪದ್ದತಿ ನಿರ್ಮೂಲನೆ ಹಾಗೂ ಶಾಲೆ ಯಿಂದ ಹೊರಗುಳಿದ ಮಕ್ಕಳಿಗೆ ಮರಳಿ ಶಾಲೆಗೆ ಕರೆತರಲು ಜಾಗೃತಿ ಮೂಡಿಸುವ ಉದ್ದೇಶದೊಂದಿಗೆ ಕಾನೂನು ರಥ ಸಂಚಾರ ಹಾಗೂ ವಿವಿಧ ಕಾರ್ಯಕ್ರಮಗಳು ಜುಲೈ ೦೩ ರಿಂದ ೦೬ ರವರೆಗೆ ನಾಲ್ಕು ದಿನಗಳ ಕಾಲ ಜಿಲ್ಲೆಯಾದ್ಯಂತ ಸಂಚಾರವನ್ನು ಕೈಗೊಳ್ಳಲಿದೆ. ಅಲ್ಲದೆ ಕೊಪ್ಪಳ ಜಿಲ್ಲೆಯಲ್ಲಿ ಸ್ವಚ್ಛ ಭಾರತ ಅಭಿಯಾನ ಕುರಿತ ಜಾಗೃತಿಯನ್ನು ವಿಶೇಷವಾಗಿ ಕೈಗೊಳ್ಳಲಾಗುತ್ತಿದೆ. ಕಾರ್ಯಕ್ರಮಗಳನ್ನು ಜಿಲ್ಲೆಯಲ್ಲಿ ವ್ಯವಸ್ಥಿತವಾಗಿ ಕೈಗೊಳ್ಳಲು ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳುವಂತೆ ಹಿರಿಯ ಸಿವಿಲ್ ನ್ಯಾಯಾಧೀಶರಾದ ಟಿ. ಶ್ರೀನಿವಾಸ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಜು. ೦೩ ರಂದು ಕೊಪ್ಪಳದಲ್ಲಿ ಕಾನೂನು ರಥದೊಂದಿಗೆ ಜಾಗೃತಿ ಜಾಥಾ ಆಯೋಜಿಸಬೇಕು, ಕಾರ್ಯಕ್ರಮಕ್ಕೆ ಜಿಲ್ಲಾಧಿಕಾರಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ, ಜಿಲ್ಲಾ ಪೊಲೀಸ್ ಪರಿಷ್ಠಾಧಿಕಾರಿ, ಹಾಗೂ ಅಪರ ಜಿಲ್ಲಾಧಿಕಾರಿಗಳನ್ನು ಆಹ್ವಾನಿಸಿ. ಮೊದಲನೇ ದಿನದಂದು ಜಿಲ್ಲಾ ಕೇಂದ್ರವಾದ ಕೊಪ್ಪಳದಲ್ಲಿ ಬೃಹತ್ ಜಾಗೃತಿ ರ‍್ಯಾಲಿಯನ್ನು ಹಮ್ಮಿಕೊಳ್ಳಬೇಕು. ರ‍್ಯಾಲಿಯಲ್ಲಿ ವಿದ್ಯಾರ್ಥಿಗಳು ಭಾಗವಹಿಸುವಂತೆ ಅಗತ್ಯ ಕ್ರಮ ವಹಿಸಬೇಕು. ಬಾಲ್ಯ ವಿವಾಹ ಹಾಗೂ ಬಾಲ ಕಾರ್ಮಿಕ ಪದ್ದತಿ ಕುರಿತು ವಿಶೇಷ ಉಪನ್ಯಾಸ ಆಯೋಜಿಸಬೇಕು. ಪೊಲೀಸ್ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳು ಕಾರ್ಯಕ್ರಮಕ್ಕೆ ಸಂಪೂರ್ಣ ಸಹಕಾರ ನೀಡಬೇಕು ಎಂದು ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯೆ ವನಿತಾ ತೊರವಿ ಹೇಳಿದರು.
ಸಭೆಯಲ್ಲಿ ಕೊಪ್ಪಳ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕರಾದ ಶ್ರೀದೇವಿ ಗದ್ದೆಪ್ಪನವರ್, ಜಿಲ್ಲಾ ನಿರೂಪಣಾಧಿಕಾರಿ ಮಂಜುನಾಥ, ಯುನಿಸೆಫ್‌ನ ಹರೀಶ್ ಜೋಗಿ, ಕ್ಷೇತ್ರ ಶಿಕ್ಷಣಾಧಿಕಾರಿ ಉಮೇಶ ಪೂಜಾರ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

Please follow and like us:

Leave a Reply