fbpx

ಡಿ. ೧೪ ರಂದು ಗಂಗಾವತಿಯಲ್ಲಿ ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳ ಶಂಕುಸ್ಥಾಪನೆ, ಉದ್ಘಾಟನೆ

 ಕೊಪ್ಪಳ ಜಿಲ್ಲಾಡಳಿತದ ವತಿಯಿಂದ ಕೊಪ್ಪಳ ಜಿಲ್ಲೆಯ ಗಂಗಾವತಿ ವಿಧಾನ ಸಭಾ ಕ್ಷೇತ್ರದಲ್ಲಿ ಕೈಗೊಂಡಿರುವ ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳ ಶಂಕುಸ್ಥಾಪನೆ, ಉದ್ಘಾಟನೆ ಸಮಾರಂಭ ಡಿ. ೧೪ ರಂದು ಸಂಜೆ ೦೪ ಗಂಟೆಗೆ ಗಂಗಾವತಿ ನಗರದ ಬಾಲಕರ ಸರಕಾರಿ ಪದವಿ ಪೂರ್ವ ಕಾಲೇಜು ಆವರಣದಲ್ಲಿ ಹಮ್ಮಿಕೊಳ್ಳಲಾಗಿದೆ.
ಕರ್ನಾಟಕದ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರು ಸಮಾರಂಭದ ಉದ್ಘಾಟನೆ ನೆರವೇರಿಸುವರು. ಅಲ್ಲದೆ ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳಿಗೆ ಚಾಲನೆ ನೀಡುವರು. ಕೊಪ್ಪಳ ಜಿಲ್ಲಾ ಉಸ್ತುವಾರಿ ಮತ್ತು ಉನ್ನತ ಶಿಕ್ಷಣ ಮಂತ್ರಿಗಳಾದ ಬಸವರಾಜ ರಾಯರಡ್ಡಿ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಹೆಚ್.ಕೆ. ಪಾಟೀಲ್, ಲೋಕೋಪಯೋಗಿ ಸಚಿವ ಹೆಚ್.ಸಿ. ಮಹದೇವಪ್ಪ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಕೆ.ಆರ್. ರಮೇಶ ಕುಮಾರ, ಇಂಧನ ಸಚಿವ ಡಿ.ಕೆ. ಶಿವಕುಮಾರ್, ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣಪ್ರಕಾಶ ಆರ್. ಪಾಟೀಲ, ತೋಟಗಾರಿಕೆ ಮತ್ತು ಕೃಷಿ ಮಾರುಕಟ್ಟೆ ಸಚಿವ ಎಸ್.ಎಸ್ ಮಲ್ಲಿಕಾರ್ಜುನ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಟಿ.ಬಿ. ಜಯಚಂದ್ರ, ಪೌರಾಡಳಿತ ಹಾಗೂ ಸಾರ್ವಜನಿಕ ಉದ್ದಿಮೆ ಸಚಿವ ಈಶ್ವರ ಭೀಮಣ್ಣ ಖಂಡ್ರೆ, ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವ ಪ್ರಿಯಾಂಕ ಎಂ. ಖರ್ಗೆ, ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ, ಅಲ್ಪಸಂಖ್ಯಾತರ ಕಲ್ಯಾಣ ಹಾಗೂ ವಕ್ಫ್ ಸಚಿವ ತನ್ವೀರ್ ಸೇಠ್ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುವರು. ಗಂಗಾವತಿ ಶಾಸಕ ಇಕ್ಬಾಲ್ ಅನ್ಸಾರಿ ಸಮಾರಂಭದ ಅಧ್ಯಕ್ಷತೆ ವಹಿಸುವರು.
ಕೊಪ್ಪಳ ಜಿ.ಪಂ. ಅಧ್ಯಕ್ಷ ಕೆ. ರಾಜಶೇಖರ ಹಿಟ್ನಾಳ, ಸಂಸದ ಕರಡಿ ಸಂಗಣ್ಣ, ಶಾಸಕರುಗಳಾದ ಶಿವರಾಜ ಎಸ್ ತಂಗಡಗಿ, ದೊಡ್ಡನಗೌಡ ಪಾಟೀಲ್, ಕೆ. ರಾಘವೇಂದ್ರ ಹಿಟ್ನಾಳ್, ವಿಧಾನಪರಿಷತ್ ಸದಸ್ಯರುಗಳಾದ ಬಸವರಾಜ ಪಾಟೀಲ ಇಟಗಿ, ಅಮರನಾಥ ಪಾಟೀಲ್, ಶರಣಪ್ಪ ಮಟ್ಟೂರ, ಜಿ.ಪಂ ಉಪಾಧ್ಯಕ್ಷೆ ಲಕ್ಷಮ್ಮ ಸಿದ್ದಪ್ಪ ನೀರಲೂಟಿ, ಗಂಗಾವತಿ ನಗರಸಭೆ ಅಧ್ಯಕ್ಷೆ ಸಣ್ಣ ಹುಲಿಗೆಮ್ಮ ಕಾಮದೊಡ್ಡಿ, ತಾ.ಪಂ ಅಧ್ಯಕ್ಷ ವಿರುಪಾಕ್ಷಗೌಡ ಮಾಲಿಪಾಟೀಲ್, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ನಾಗರಾಜ್ ನಂದಾಪುರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಪ್ರಧಾನ ಕಾರ್ಯದರ್ಶಿ ಹಾಗೂ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಉಮಾ ಮಹದೇವನ್, ಹೈದ್ರಾಬಾದ್-ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿ ಕಾರ್ಯದರ್ಶಿ ಹಾಗೂ ಕಲಬುರಗಿ ಪ್ರಾದೇಶಿಕ ಆಯುಕ್ತ ಹರ್ಷ ಗುಪ್ತ ವಿಶೇಷ ಆಹ್ವಾನಿತರಾಗಿ ಭಾಗವಹಿಸುವರು.
ಅಭಿವೃದ್ಧಿ ಕಾರ್ಯಕ್ರಮಗಳ ವಿವರ : ಡಿ. ೧೪ ರಂದು ಮುಖ್ಯಮಂತ್ರಿಗಳಿಂದ ಉದ್ಘಾಟನೆ ಹಾಗೂ ಶಂಕುಸ್ಥಾಪನೆಗೊಳ್ಳಲಿರುವ ವಿವಿಧ ಅಭಿವೃದ್ಧಿ ಯೋಜನೆಗಳ ವಿವರ ಇಂತಿದೆ. ನಗರಾಭಿವೃದ್ಧಿ ಪೌರಾಡಳಿತ ಇಲಾಖೆ ವತಿಯಿಂದ ಗಂಗಾವತಿ ನಗರೋತ್ಥಾನ ೩ನೇ ಹಂತದ ಯೋಜನೆಯಡಿಯಲ್ಲಿ ೩೫ ಕೋಟಿ ರೂ. ವೆಚ್ಚದಲ್ಲಿ ವಿವಿಧ ಕಾಮಗಾರಿಗಳ ಶಂಕುಸ್ಥಾಪನೆ. ಲೋಕೋಪಯೋಗಿ ಇಲಾಖೆಯಿಂದ ೫೮.೧೪ ಕೋಟಿ ರೂ. ವೆಚ್ಚದಲ್ಲಿ ರಾಜ್ಯ ಹೆದ್ದಾರಿ, ಜಿಲ್ಲಾ ಮುಖ್ಯ ರಸ್ತೆ ಸುಧಾರಣೆ ಹಾಗೂ ಸಿ.ಸಿ. ರಸ್ತೆ ನಿರ್ಮಾಣ. ಪಂಚಾಯತ್ ರಾಜ್ ಇಂಜಿನಿಯರಿಂಗ್ ಇಲಾಖೆಯಿಂದ ೧೨.೨೦ ಕೋಟಿ ರೂ. ವೆಚ್ಚದಲ್ಲಿ ಗ್ರಾಮ ವಿಕಾಸ, ಕೆರೆ ಸಂಜೀವಿನಿ, ಮೂಲಭೂತ ಸೌಕರ್ಯ ಹಾಗೂ ರಸ್ತೆ ನಿರ್ಮಾಣ. ಗಂಗಾವತಿ ವಿಧಾನಸಭಾ ಕ್ಷೇತ್ರದ ವಿವಿಧ ಗ್ರಾಮಗಳಲ್ಲಿ ೨೮.೬೫ ಕೋಟಿ ವೆಚ್ಛದಲ್ಲಿ ೨೬ ಶುದ್ಧ ಕುಡಿಯುವ ನೀರಿನ ಘಟಕಗಳ ನಿರ್ಮಾಣ ಮತ್ತು ತುರ್ತು ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸುವುದು. ನೀರಾವರಿ ಇಲಾಖೆಯಿಂದ ಗಂಗಾವತಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಅಚ್ಚುಕಟ್ಟು ರಸ್ತೆ ನಿರ್ಮಾಣಕ್ಕೆ ೫.೭೮ ಕೋಟಿ ವೆಚ್ಛದಲ್ಲಿ ಭೂ ಪುನರ್ ಸುಧಾರಣೆ. ಪ್ರವಾಸೋದ್ಯಮ ಇಲಾಖೆಯಿಂದ ೬.೫೨ ಕೋಟಿ ರೂ. ವೆಚ್ಛದಲ್ಲಿ ದೇವಸ್ಥಾದ ಯಾತ್ರಿ ನಿವಾಸ, ಮೂಲಭೂತ ಸೌಕರ್ಯ ಹಾಗೂ ಪ್ರವಾಸಿ ಟ್ಯಾಕ್ಸಿ ವಿತರಣೆ. ಮುಖ್ಯಮಂತ್ರಿ ಗ್ರಾಮ ಸಡಕ್ ಯೋಜನೆಯಡಿ ೩೯.೭೦ ಕೋಟಿ ರೂ. ವೆಚ್ಛದಲ್ಲಿ ರಸ್ತೆ ಅಭಿವೃದ್ಧಿ ಮತ್ತು ಡಾಂಬರೀಕರಣ. ಶಿಕ್ಷಣ ಇಲಾಖೆಯಿಂದ ೯.೬೪ ಕೋಟಿ ರೂ. ವೆಚ್ಛದಲ್ಲಿ ಶಾಲಾ ಕೊಠಡಿಗಳ ನಿರ್ಮಾಣ ಮತ್ತು ಪೀಠೋಪಕರಣ ಒದಗಿಸುವುದು. ಕೃಷಿ ಉತ್ಪನ್ನ ಮಾರುಕಟ್ಟೆ ಇಲಾಖೆಯಿಂದ ೨೪ ಕೋಟಿ ರೂ. ವೆಚ್ಛದಲ್ಲಿ ಗೋಡಾನ್ ನಿರ್ಮಾಣ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ೧೪.೫೦ ಕೋಟಿ ರೂ. ವೆಚ್ಛದಲ್ಲಿ ನೂತನ ಆಸ್ಪತ್ರೆ ಕಟ್ಟಡ ನಿರ್ಮಾಣ, ತೀವ್ರ ನಿಗಾ ಘಟಕ ಮತ್ತು ಇತರೆ ಕಾಮಗಾರಿಗಳ ಶಂಕುಸ್ಥಾಪನೆ ಜರುಗಲಿದೆ.

Please follow and like us:
error
error: Content is protected !!