You are here
Home > Koppal News > ಡಿ. ೨೨ & ೨೩ ರಂದು ಕೊಪ್ಪಳದಲ್ಲಿ ರಾಜ್ಯ ಸರ್ಕಾರಿ ನೌಕರರ ಕ್ರೀಡಾಕೂಟ : ಪಿ. ಸುನೀಲ್ ಕುಮಾರ್

ಡಿ. ೨೨ & ೨೩ ರಂದು ಕೊಪ್ಪಳದಲ್ಲಿ ರಾಜ್ಯ ಸರ್ಕಾರಿ ನೌಕರರ ಕ್ರೀಡಾಕೂಟ : ಪಿ. ಸುನೀಲ್ ಕುಮಾರ್

ಕೊಪ್ಪಳ ಡಿ. : : ರಾಜ್ಯ ಸರ್ಕಾರಿ ನೌಕರರ ಜಿಲ್ಲಾ ಮಟ್ಟದ ವಾರ್ಷಿಕ ಕ್ರೀಡಾಕೂಟವನ್ನು ಇದೇ ಡಿ. ೨೨ ಮತ್ತು ೨೩ ರಂದು ಎರಡು ದಿನಗಳ ಕಾಲ ಕೊಪ್ಪಳದ ಜಿಲ್ಲಾ ಕ್ರೀಡಾಂಗಣದಲ್ಲಿ ಆಯೋಜಿಸಲಾಗುವುದು ಎಂದು ಜಿಲ್ಲಾಧಿಕಾರಿ ಪಿ. ಸುನೀಲ್ ಕುಮಾರ್ ಅವರು ಹೇಳಿದರು.
ಪ್ರಸಕ್ತ ಸಾಲಿನ ರಾಜ್ಯ ಸರ್ಕಾರಿ ನೌಕರರ ಕ್ರೀಡಾಕೂಟವನ್ನು ಕೊಪ್ಪಳ ಜಿಲ್ಲಾ ಮಟ್ಟದಲ್ಲಿ ಸಂಘಟಿಸುವ ಕುರಿತು ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಂಗಳವಾರದಂದು ಆಯೋಜಿಸಲಾದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ರಾಜ್ಯ ಸರ್ಕಾರಿ ನೌಕರರ ಜಿಲ್ಲಾ ಮಟ್ಟದ ವಾರ್ಷಿಕ ಕ್ರೀಡಾಕೂಟ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಅಚ್ಚುಕಟ್ಟಾಗಿ ಆಯೋಜಿಸುವುದಕ್ಕೆ ಸಂಬಂಧಿಸಿದಂತೆ, ಜಿಲ್ಲಾ ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳಿಗೆ ಜವಾಬ್ದಾರಿಯನ್ನು ನೀಡಲಾಗಿದೆ. ಆಯಾ ಅಧಿಕಾರಿಗಳು, ತಮಗೆ ವಹಿಸಿದ ಹೊಣೆಗಾರಿಕೆಯನ್ನು ಅಚ್ಚುಕಟ್ಟಾಗಿ ನಿರ್ವಹಿಸಿ, ಕ್ರೀಡಾಕೂಟವನ್ನು ಯಶಸ್ವಿಗೊಳಿಸಬೇಕು. ಕ್ರೀಡಾಕೂಟದಲ್ಲಿ ಅಥ್ಲೆಟಿಕ್ಸ್, ಕುಸ್ತಿ, ಪವರ್‌ಲಿಫ್ಟಿಂಗ್ ಸೇರಿದಂತೆ ಒಳಾಂಗಣ ಕ್ರೀಡೆಗಳಾದ ಕೇರಂ, ಚೆಸ್ ಸ್ಪರ್ಧೆಗಳನ್ನು ಏರ್ಪಡಿಸಲಾಗುವುದು. ಈ ಬಾರಿ ಈಜು ಸ್ಪರ್ಧೆ ಆಯೋಜಿಸಲು ಯೋಜಿಸಲಾಗಿದೆ. ಕ್ರೀಡಾಕೂಟದಲ್ಲಿ ಜಿಲ್ಲೆಯ ಎಲ್ಲ ತಾಲೂಕಿನಿಂದ ಸರ್ಕಾರಿ ನೌಕರರು ಆಗಮಿಸಿ, ಕ್ರೀಡಾಕೂಟದಲ್ಲಿ ಪಾಲ್ಗೊಳ್ಳುವಂತಾಗಬೇಕು. ನೌಕರರಿಗೆ ಓಓಡಿ ಸೌಲಭ್ಯ ಒದಗಿಸುವುದು, ಊಟೋಪಹಾರದ ವ್ಯವಸ್ಥೆ, ಕ್ರೀಡಾ ಸಾಮಗ್ರಿಗಳ ಪೂರೈಕೆ, ನಿರ್ಣಾಯಕರ ನಿಯೋಜನೆ, ಕ್ರೀಡಾಂಗಣದಲ್ಲಿ ಪ್ರಥಮ ಚಿಕಿತ್ಸೆ, ಔಷಧೋಪಚಾರ ವ್ಯವಸ್ಥೆ, ಆಂಬುಲೆನ್ಸ್ ವ್ಯವಸ್ಥೆ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಪಿ. ಸುನೀಲ್ ಕುಮಾರ್ ಅವರು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದರು.
ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾ ಅಧ್ಯಕ್ಷ ನಾಗರಾಜ ಜುಮ್ಮನ್ನವರ್ ಅವರು ಮಾತನಾಡಿ, ರಾಜ್ಯ ಸರ್ಕಾರಿ ನೌಕರರ ಜಿಲ್ಲಾ ಮಟ್ಟದ ಕ್ರೀಡಾಕೂಟವನ್ನು ಅಚ್ಚುಕಟ್ಟಾಗಿ ಆಯೋಜಿಸಲಾಗುವುದು. ಕಳೆದ ಬಾರಿ ನಡೆದ ಕ್ರೀಡಾಕೂಟದಲ್ಲಿ ಜಿಲ್ಲೆಯಿಂದ ರಾಜ್ಯ ಮಟ್ಟಕ್ಕೆ ಆಯ್ಕೆಯಾದ ನೌಕರರು ರಾಜ್ಯ ಮಟ್ಟದ ಸ್ಪರ್ಧೆಗಳಲ್ಲಿ ಉತ್ತಮ ಸಾಧನೆಯನ್ನು ಮಾಡಿದ್ದಾರೆ. ಈ ವರ್ಷದ ಜಿಲ್ಲಾ ಮಟ್ಟದ ಕ್ರೀಡಾಕೂಟವನ್ನು ಯಶಸ್ವಿಯಾಗಿಸಲು ಎಲ್ಲ ಅಧಿಕಾರಿ, ಸಿಬ್ಬಂದಿಗಳು ಹಾಗೂ ಎಲ್ಲ ಸರ್ಕಾರಿ ನೌಕರರ ಸಹಕಾರ ಅಗತ್ಯವಾಗಿದೆ ಎಂದರು.
ಸಭೆಯಲ್ಲಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕರು ಹಾಗೂ ರಾಜ್ಯ ಸರ್ಕಾರಿ ನೌಕರರ ಕ್ರೀಡಾಕೂಟ ಸಮಿತಿ, ಕೊಪ್ಪಳ ಕಾರ್ಯದರ್ಶಿ ಆರ್.ಜಿ. ನಾಡಗೀರ, ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲೆಯ ಪ್ರಧಾನ ಕಾರ್ಯದರ್ಶಿ ಶಿವಪ್ಪ ಜೋಗಿ, ಪಶು ಸಂಗೋಪನೆ ಇಲಾಖೆ ಉಪನಿರ್ದೇಶಕ ಡಾ. ಬಿ.ಕೆ. ಸಾಲಿನ, ಜಿಲ್ಲಾ ದೈಹಿಕ ಶಿಕ್ಷಣ ಪರಿವೀಕ್ಷಕ ಬಸವರಾಜ, ತಾಲೂಕ ಕ್ರೀಡಾಧಿಕಾರಿ ಶರಣಪ್ಪ ಬಂಡಿಹಾಳ, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಶಿವಾನಂದ ಪೂಜಾರ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು, ನೌಕರರ ಸಂಘದ ಪದಾಧಿಕಾರಿಗಳು ಉಪಸ್ಥಿತರಿದ್ದರು.

Top