ನಿಗಧಿತ ಅವಧಿಯೋಳಗೆ ಯೋಜನೆ ಪೂರ್ಣಗೊಳಿಸಿ : ರಾಜಶೇಖರ ಹಿಟ್ನಾಳ ಸೂಚನೆ

ಕೊಪ್ಪಳ ಜಿಲ್ಲಾ ಪಂಚಾಯತ ಪ್ರಗತಿ ಪರಿಶೀಲನಾ ಸಭೆ

ಕೊಪ್ಪಳ ಅ. : ಜನರ ಅನುಕೂಲಕ್ಕಾಗಿ ಸರ್ಕಾರ ಜಾರಿಗೊಳಿಸಿರುವ ಯೋಜನೆಗಳ ಕಾಮಗಾರಿಗಳನ್ನು ನಿಗಧಿತ ಅವಧಿಯೊಳಗೆ ಪೂರ್ಣಗೊಳಿಸಿ ಜನರಿಗೆ ಸರ್ಮಪಿಸಬೇಕು ಎಂದು ಕೊಪ್ಪಳ ಜಿಲ್ಲಾ ಪಂಚಾಯತ ಅಧ್ಯಕ್ಷ ರಾಜಶೇಖರ ಹಿಟ್ನಾಳ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಕೊಪ್ಪಳ ಜಿಲ್ಲಾ ಪಂಚಾಯತ ಸಭಾಂಗಣದಲ್ಲಿ ಬುಧವಾರದಂದು ಏರ್ಪಡಿಸಲಾಗಿದ್ದ ಜಿ.ಪಂ ಪ್ರಗತಿ ಪರಿಶೀಲನಾ (ಕೆ.ಡಿ.ಪಿ) ಸಭೆಯ ಅಧ್ಯಕ್ಷತೆಯನ್ನು ವಹಿಸಿ ಅವರು ಮಾತನಾಡಿದರು.
ನಿಗಧಿತ ಅವಧಿಯೊಳಗೆ ಯೋಜನೆಗಳನ್ನು ಪೂರ್ಣಗೊಳಿಸುವಲ್ಲಿ ಸಂಬಂಧಿಸಿದ ಜಿಲ್ಲಾ ಮಟ್ಟದ ಇಲಾಖೆಗಳ ಅಧಿಕಾರಿಗಳು ನಿರ್ಲಕ್ಷ್ಯವಹಿಸದೇ ಯೋಜನೆ ತ್ವರಿತವಾಗಿ ಪೂರ್ಣಗೊಳಿಸಬೇಕು. ತಮ್ಮ ಇಲಾಖೆಯ ಯೋಜನೆಗಳ ಕಾಮಗಾರಿಗಳನ್ನು ಪೂರ್ಣಗೊಳಿಸುವಲ್ಲಿ ವಿಳಂಭ ಮಾಡದೇ ಜನತೆಗೆ ಸರ್ಕಾರದ ಯೋಜನೆಗಳ ಅನುಕೂಲತೆ ದೊರಕಿಸಿಕೊಡುವ ನಿಟ್ಟಿನಲ್ಲಿ ತಮ್ಮ ಜವಾಬ್ದಾರಿ ನಿಭಾಯಿಸಬೇಕು. ವಿವಿಧ ಇಲಾಖೆಗಳ ಅಧಿಕಾರಿಗಳು ತಮಗೆ ನೀಡಿರುವ ಗುರಿಯಲ್ಲಿ ಶೇ. 80 ರಷ್ಟು ಸಾಧನೆ ಗೈದಿದ್ದು, ಮುಂಬರುವ ದಿನಗಳಲ್ಲಿ ಸರ್ಕಾರದ ಯೋಜನೆಗಳನ್ನು ಜನತೆಗೆ ತಲುಪಿಸಿ ಶೇ. 100 ರಷ್ಟು ಗುರಿ ಸಾಧಿಸಲು ಅಗತ್ಯ ಕ್ರಮಗೈಗೊಳ್ಳಬೇಕು.
ಕೊಪ್ಪಳ ಜಿಲ್ಲೆಯಲ್ಲಿ ಅಧಿಕ ಪ್ರಮಾಣದಲ್ಲಿ ಮಳೆಯಾಗಿದ್ದು, ಡೆಂಗ್ಯೂ, ಮಲೇರಿಯಾ ಸೇರಿದಂತೆ ವಿವಿಧ ರೋಗಗಳು ಉಲ್ಬಣಗೊಳ್ಳದಂತೆ ಮುಂಜಾಗೃತ ಕ್ರಮಗಳನ್ನು ಕೈಗೊಂಡು ಸಾರ್ವಜನಿಕರಲ್ಲಿ ಸ್ವಚ್ಛತೆಯಬಗ್ಗೆ ಜಾಗೃತಿ ಮೂಡಿಸಬೇಕು. ಆರೋಗ್ಯ ಇಲಾಖೆಯ ಅಧಿಕಾರಿಗಳು ರೋಗಗಳ ತಡೆಗಟ್ಟುವಲ್ಲಿ ಮುಂಜಾಗೃತ ಕ್ರಮಗಳನ್ನು ಕೈಗೊಳ್ಳಬೆಕು. ಅಗತ್ಯ ವಿರುವ ಮಕ್ಕಳಿಗೆ ಸಮಯಕ್ಕೆ ಸರಿಯಾಗಿ ಇಲಾಖೆಯಿಂದ ಸಿಗಬಹುದಾದ ಲಸಿಕೆ, ಔಷಧಿ ಇತ್ಯಾಧಿಗಳ ವ್ಯವಸ್ಥೆ ಮಾಡಿಕೊಳ್ಳಬೇಕು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಗ್ರಾಮೀಣ ಭಾಗದ ಜನತೆಗೆ ಶುದ್ಧ ಕುಡಿಯುವ ನೀರು, ಸಮರ್ಪಕ ವಿದ್ಯುತ್ ಪೂರೈಕೆಗಳ ಬಗ್ಗೆ ಸಂಬಂಧಿಸಿದ ಅಧಿಕಾರಿಗಳು ಕಟ್ಟೆಚ್ಚರವಹಿಸಿ ಶ್ರಮೀಸಬೇಕು. ನೆನೆಗುದಿಗೆ ಬಿದ್ದಿರುವ ಅಪೂರ್ಣ ಕಾಮಗಾರಿಗಳನ್ನು ತ್ವರಿತಗತಿಯಲ್ಲಿ ಪೂರ್ಣಗೊಳಿಸಬೇಕು. ಸರ್ಕಾರ ಸಾಕಷ್ಟು ಅನುಧಾನ ಬಿಡುಗಡೆಗೊಳಿಸುತ್ತಿದೆ. ತಮ್ಮ ವ್ಯಾಪ್ತಿಯಲ್ಲಿ ಕೈಗೊಳ್ಳುವ ಅಗತ್ಯ ಕಾಮಗಾರಿ ಯೋಜನೆಗಳ ಯೋಜನಾ ಪಟ್ಟಿ ಸಿದ್ಧಪಡಿಸಿ ಪ್ರಸ್ತಾವನೆಯನ್ನು ಮೇಲಾಧಿಕಾರಿಗಳಿಗೆ ಸಲ್ಲಿಸಿ. ಅದರ ಒಂದು ಪ್ರತಿ ಜಿಲ್ಲಾ ಪಂಚಾಯತಿಗೆ ಸಲ್ಲಿಸಿ. ಸರ್ಕಾರದ ಮಟ್ಟದಲ್ಲಿ ಚರ್ಚಿಸುವಂತಹ ಯಾವುದೇ ಕೆಲಸಗಳಿರಲಿ ಅದನ್ನು ಸರ್ಕಾರಕ್ಕೆ ಮನವರಿಕೆಮಾಡಿ ಅದಕ್ಕೆ ಅನುಮೋದನೆ ಮಂಜೂರಾತಿ ಪಡೆದು ಹೆಚ್ಚುವರಿ ಅನುಧಾನ ಬಿಡುಗಡೆಗೆ ಮನವಿ ಮಾಡಿಕೊಳ್ಳಲಾಗುವುದು. ವಿವಿಧ ಇಲಾಖಾ ಅಧಿಕಾರಿಗಳು ತಮ್ಮ ಇಲಾಖೆಯ ಎಲ್ಲಾ ಯೋಜನೆಗಳನ್ನು ತ್ವರಿತಗತಿಯಲ್ಲಿ ಪೂರ್ಣಗೊಳಿಸುವಂತೆ ಕೊಪ್ಪಳ ಜಿಲ್ಲಾ ಪಂಚಾಯತ ಅಧ್ಯಕ್ಷ ರಾಜಶೇಖರ ಹಿಟ್ನಾಳ ಅವರು ಸೂಚನೆ ನೀಡಿದರು. ಅಲ್ಲದೇ ವಿವಿಧ ಇಲಾಖೆಗಳ ಅಧಿಕಾರಿಗಳ ಪ್ರಗತಿ ಪರಿಶೀಲನೆ ನಡೆಸಿದರು.
ಸಭೆಯಲ್ಲಿ ಕೊಪ್ಪಳ ಜಿಲ್ಲಾ ಪಂಚಾಯತ ಉಪಾಧ್ಯಕ್ಷೆ ಲಕ್ಷ್ಮಮ್ಮ ಸಿದ್ದಪ್ಪ ನೀರಲೂಟಿ, ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ವೆಂಕಟರಾಜಾ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

Please follow and like us:
error