ನೀತಿ ಸಂಹಿತೆ ಉಲ್ಲಂಘನೆ ಬಗ್ಗೆ ಚುನಾವಣಾ ತಂಡಗಳು ನಿಗಾ ವಹಿಸಿ : ಎಂ. ಕನಗವಲ್ಲಿ

ವಿಧಾನಸಭಾ ಸಾರ್ವತ್ರಿಕ ಚುನಾವಣೆ ನಿಮಿತ್ಯ ನೀತಿ ಸಂಹಿತೆ ಪಾಲಿಸಬೇಕಾದ್ದ ಎಲ್ಲ ರಾಜಕೀಯ ಪಕ್ಷಗಳು, ಅಭ್ಯರ್ಥಿಗಳು ಹಾಗೂ ಅಧಿಕಾರಿಗಳ ಜವಾಬ್ದಾರಿಯಾಗಿದ್ದು, ಉಲ್ಲಂಘನೆ ಪ್ರಕರಣಗಳ ಬಗ್ಗೆ ಚುನಾವಣೆಗಾಗಿ ನೇಮಿಸಲಾಗಿರುವ ಎಲ್ಲ ತಂಡಗಳು ತೀವ್ರ ನಿಗಾ ವಹಿಸಬೇಕು ಎಂದು ಜಿಲ್ಲಾಧಿಕಾರಿ ಎಂ. ಕನಗವಲ್ಲಿ ಅವರು ಸೂಚನೆ ನೀಡಿದರು.
ಜಿಲ್ಲಾ ಪಂಚಾಯತಿ ಸಭಾಂಗಣದಲ್ಲಿ ಬುಧವಾರದಂದು ಚುನಾವಣಾ ವಿವಿಧ ತಂಡಗಳಿಗಾಗಿ ಏರ್ಪಡಿಸಲಾಗಿದ್ದ ತರಬೇತಿಯಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.
ಈಗಾಗಲೆ ಮಾದರಿ ನೀತಿ ಸಂಹಿತೆ ಜಾರಿಯಾಗಿದ್ದು, ನೀತಿ ಸಂಹಿತೆ ಪಾಲನೆಯ ಬಗ್ಗೆ ನಿಗಾ ವಹಿಸಲು ಹಲವು ತಂಡಗಳನ್ನು ರಚಿಸಿ, ಅಧಿಕಾರಿ, ಸಿಬ್ಬಂದಿಗಳನ್ನು ನಿಯೋಜಿಸಲಾಗಿದೆ. ಸೆಕ್ಟರ್ ಅಧಿಕಾರಿಗಳು, ಫ್ಲೈಯಿಂಗ್ ಸ್ಕ್ವಾಡ್, ವಿಡಿಯೋ ಸರ್ವೆಲೆನ್ಸ್ ತಂಡ, ವಿಡಿಯೋ ವೀಕ್ಷಣಾ ತಂಡ, ಚುನಾವಣಾ ವೆಚ್ಚ ಪರಿಶೀಲನೆ, ಚೆಕ್‌ಪೋಸ್ಟ್ ತಂಡ, ವಿವಿಧ ಪೊಲೀಸ್ ಅಧಿಕಾರಿಗಳ ತಂಡ ಹೀಗೆ ನಾನಾ ತಂಡಗಳನ್ನು ರಚಿಸಲಾಗಿದೆ. ಈ ಎಲ್ಲ ತಂಡಗಳು ತಮಗೆ ವಹಿಸಿರುವ ಜವಾಬ್ದಾರಿಯನ್ನು ಚಾಚೂ ತಪ್ಪದೆ ನಿರ್ವಹಿಸಬೇಕು. ನೀತಿ ಸಂಹಿತೆ ಉಲ್ಲಂಘನೆ ಪ್ರಕರಣಗಳ ಬಗ್ಗೆ ನಿಗಾ ವಹಿಸಿ, ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಎಂ. ಕನಗವಲ್ಲಿ ಅವರು ಹೇಳಿದರು.
ತರಬೇತಿ ಕಾರ್ಯಕ್ರಮದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಅನೂಪ್ ಶೆಟ್ಟಿ, ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ವೆಂಕಟ್ ರಾಜಾ, ಅಪರ ಜಿಲ್ಲಾಧಿಕಾರಿ ಡಾ. ರುದ್ರೇಶ್ ಘಾಳಿ, ಉಪವಿಭಾಗಾಧಿಕಾರಿ ರವಿ ತಿರ್ಲಾಪುರ ಸೇರಿದಂತೆ ವಿವಿಧ ಅಧಿಕಾರಿಗಳು, ರಿಟರ್ನಿಂಗ್ ಅಧಿಕಾರಿಗಳು, ಸಹಾಯಕ ರಿಟರ್ನಿಂಗ್ ಅಧಿಕಾರಿಗಳು, ಫ್ಲೈಯಿಂಗ್ ಸ್ಕ್ವಾಡ್, ವಿಡಿಯೋ ಸರ್ವೆಲೆನ್ಸ್ ತಂಡ, ವಿಡಿಯೋ ವೀಕ್ಷಣಾ ತಂಡ, ಚುನಾವಣಾ ವೆಚ್ಚ ಪರಿಶೀಲನೆ, ಚೆಕ್‌ಪೋಸ್ಟ್ ತಂಡಗಳ ಅಧಿಕಾರಿಗಳು ಪಾಲ್ಗೊಂಡಿದ್ದರು.