ಪರಿಶಿಷ್ಟರ ಮೇಲಿನ ದೌರ್ಜನ್ಯ ಪ್ರಕರಣಗಳಲ್ಲಿ ತಪ್ಪಿತಸ್ಥರಿಗೆ ಶಿಕ್ಷೆಯಾಗಬೇಕು

ಕೊಪ್ಪಳ ಅ. : ಪರಿಶಿಷ್ಟರ ಮೇಲಿನ ದೌರ್ಜನ್ಯ ಪ್ರಕರಣಗಳಲ್ಲಿ ತಪ್ಪಿತಸ್ಥರಿಗೆ ಶಿಕ್ಷೆಯಾಗಬೇಕು ಎಂದು ಜಿಲ್ಲಾಧಿಕಾರಿ ಪಿ. ಸುನೀಲ್ ಕುಮಾರ್ ಅವರು ಹೇಳಿದರು.
ಕೊಪ್ಪಳ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶುಕ್ರವಾರದಂದು (ಅ.04) ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಆಯೋಜಿಸಲಾಗಿದ್ದ ದೌರ್ಜನ್ಯ ನಿಯಂತ್ರಣ, ಜಿಲ್ಲಾ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗದವರ ಮೇಲಾದ ದೌರ್ಜನ್ಯ ಪ್ರಕರಣಗಳಲ್ಲಿ ನೊಂದವರಿಗೆ ಪರಿಹಾರ ಧನ ನೀಡುವ ಪ್ರಕ್ರಿಯೆ ತ್ವರಿತಗೊಳಿಸಬೇಕು.  ಪರಿಶಿಷ್ಟರ ಮೇಲಿನ ದೌರ್ಜನ್ಯ ಪ್ರಕರಣಗಳಲ್ಲಿ ತಪ್ಪಿತಸ್ಥರಿಗೆ ಶಿಕ್ಷೆಯಾಗಬೇಕಿದ್ದು, ಇದಕ್ಕೆ ಪÇರಕವಾದ ಕ್ರಮಗಳನ್ನು ಪೆÇಲೀಸ ಮತ್ತು ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳು ಕೈಗೊಳ್ಳಬೇಕು.  ದೌರ್ಜನ್ಯ ಪ್ರಕರಣಗಳ ಪರಿಹಾರ ದೊರಕಿಸುವ ಕುರಿತು ಯಾವುದೇ ಸಮಸ್ಯೆಗಳು ಅಥವಾ ಅಡೆತಡೆ ಇದ್ದಲ್ಲಿ ನಮ್ಮ ಗಮನಕ್ಕೆ ತನ್ನಿ ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಪರಿಶಿಷ್ಟರಿಗೆ ಸರ್ಕಾರದ ವತಿಯಿಂದ ಕೃಷಿ ಜಮೀನುಗಳು ಮಂಜೂರು ಆಗಿದ್ದು, ಅಂತಹ ಫಲಾನುಭವಿಗಳಿಗೆ ಈ ಕೂಡಲೇ ಪಹಣಿಯನ್ನು ನೀಡುವಂತೆ ಸಂಬಂಧಿಸಿದ ತಹಶೀಲ್ದಾರರು ಕ್ರಮ ವಹಿಸಬೇಕು.  ಅಲ್ಲದೇ ವಸತಿ ಸೌಲಭ್ಯ, ಅಕ್ರಮ ಸಕ್ರಮ ಯೋಜನೆಯಡಿ ಹಕ್ಕುಪತ್ರ ವಿತರಣೆ, ಕೃಷಿ ಭೂಮಿ, ಪಹಣಿ ಹಂಚಿಕೆ ಇತ್ಯಾದಿ ಸರ್ಕಾರಿ ಯೋಜನೆಗಳು ಅರ್ಹ ಫಲಾನುಭವಿಗಳಿಗೆ ಒದಗಿಸುವ ನಿಟ್ಟಿನಲ್ಲಿ ಸಂಬಂಧಪಟ್ಟ ಅಧಿಕಾರಿಗಳು ಸೂಕ್ತ ಕ್ರಮಕೈಗೊಳ್ಳಬೇಕು.  ಸುಳ್ಳು ಜಾತಿ ಪ್ರಮಾಣ ಪತ್ರ ಪಡೆದು ಸರ್ಕಾರದ ಸೌಲಭ್ಯವನ್ನು ಪಡೆದ ತಪ್ಪಿತಸ್ಥರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು.  ದೇವದಾಸಿ ಮಹಿಳೆಯರಿಗೆ ಸರ್ಕಾರದಿಂದ ನೀಡಲಾಗುತ್ತಿರುವ ಸೌಲಭ್ಯಗಳ ಬಗ್ಗೆ ಮಾಹಿತಿ ನೀಡಬೇಕಾಗಿದ್ದು, ಈ ಕುರಿತಾಗಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕರು ಸೂಕ್ತ ಕ್ರಮ ವಹಿಸಬೆಕು.  ಅಲ್ಲದೇ ಅರ್ಹ ಫಲಾನುಭವಿಗಳಿಗೆ ಸೌಲಭ್ಯ ದೊರತಿದೆಯೇ ಎಂಬುವುದರ ಬಗ್ಗೆಯೂ ಪರಿಶೀಲಿಸಬೇಕು ಎಂದರು.
ಅಲೆಮಾರಿ ಅರೆಅಲೆಮಾರಿ ಜನಾಂಗದವರಿಗೆ ಜಮೀನು ನೀಡಬೇಕೆಂದು ಈ ಜನಾಂಗದವರು ಸರ್ಕಾರದಿಂದ ವಿಶೇಷ ಅನುಮೋದನೆಯನ್ನು ಪಡೆದಿದ್ದಾರೆ.  ಈ ನಿಟ್ಟಿನಲ್ಲಿ ಜಿಲ್ಲೆಯ 280 ಫಲಾನುಭವಿಗಳನ್ನು ಗುರುತಿಸಲಾಗಿದೆ.  ಇವರಿಗೆ ಜಮೀನು ಒದಗಿಸಲು ಜಿಲ್ಲಾಡಳಿತವು ಭೂ ಮಾಲೀಕರಿಂದ ಜಮೀನು ಖರೀದಿಸಲಿದೆ.  ಈ ಪ್ರಕ್ರಿಯೆ ತ್ವರಿತವಾಗಿ ಕೈಗೊಳ್ಳುವಂತೆ ಡಾ. ಬಿ.ಆರ್. ಅಂಬೇಡ್ಕರ್ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರು ಅಗತ್ಯ ಕ್ರಮ ವಹಿಸಬೇಕು ಎಂದು ಸೂಚಿಸಿದರು.
ಡಾ. ಬಿ.ಆರ್. ಅಂಬೇಡ್ಕರ್ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕ ಪಿ. ರಮೇಶ ಮಾತನಾಡಿ, ಅಲೆಮಾರಿ ಅರೆಅಲೆಮಾರಿ ಜನಾಂಗದವರಿಗೆ ಜಮೀನು ಒದಗಿಸಲು ಖರೀದಿ ಪ್ರಕ್ರಿಯೆ ಜಾಲ್ತಿಯಲ್ಲಿದೆ.  ಗಂಗಾವತಿ ಹಾಗೂ ಕನಕಗಿರಿ ತಾಲ್ಲೂಕುಗಳಲ್ಲಿ ಸುಮಾರು 200 ಫಲಾನುಭವಿಗಳಿಗೆ ತಲಾ ಒಂದು ಎಕರೆ ನೀರಾವರಿ ಭೂಮಿಯನ್ನು ನೀಡಲು ಕ್ರಮ ವಹಿಸಲಾಗಿದ್ದು, ಜಿಲ್ಲಾಡಳಿತದಿಂದ ಶೀಘ್ರದಲ್ಲೆÃ ಈ ಸೌಲಭ್ಯವನ್ನು ನೀಡಲಾಗುವುದು ಎಂದು ಸಭೆಗೆ ಮಾಹಿತಿ ನೀಡಿದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ. ಸಂಗೀತಾ ಅವರು ಮಾತನಾಡಿ, ಕೊಪ್ಪಳ ತಾಲ್ಲೂಕಿನ ತಿಗರಿ ಗ್ರಾಮದಲ್ಲಿ ಸಾಮೂಹಿಕ ವಿವಾಹ ಕಾರ್ಯಕ್ರಮಗಳಲ್ಲಿ ಪರಿಶಿಷ್ಟ ಜಾತಿಯವರಿಗೆ ತಾರತಮ್ಯ ಕುರಿತು ಪೊಲೀಸ್ ಇಲಾಖೆಗೆ ದೂರು ಬಂದಿದ್ದು, ಈ ಪ್ರಕರಣದ ಬಗ್ಗೆ ಪರಿಶೀಲಿಸಿ ಸಂಬಂಧಿಸಿದ ಎಂಟು ಜನರ ವಿರುದ್ಧ ದೂರು ದಾಖಲಿಸಲಾಗಿತ್ತು.  ಸದ್ಯ ಅಲ್ಲಿನ ಹಿರಿಯ ಮುಖಂಡರೊಂದಿಗೆ ಹಾಗೂ ದೂರು ದಾಖಲಿಸಿದವರ ಜೊತೆ ನಡೆಸಿದ ಶಾಂತಿ ಸಭೆಯಲ್ಲಿ ಮುಖಂಡರು ಇಂತಹ ಪ್ರಕರಣ ಮರುಕಳಿಸದಂತೆ ಭರವಸೆ ನೀಡಿದ್ದು, ಸದ್ಯ ಅಲ್ಲಿ ಶಾಂತಿಯ ವಾತಾವರಣ ಇದೆ ಎಂದರು.
ಸಭೆಯಲ್ಲಿ ಜಿಲ್ಲಾ ಪಂಚಾಯತ ಕಾರ್ಯನಿರ್ವಾಹಕ ಅಧಿಕಾರಿ ರಘುನಂದನ್ ಮೂರ್ತಿ, ಪ್ರೊಬೇಷನರಿ ಐ.ಎ.ಎಸ್. ಅಧಿಕಾರಿ ನೇಹಾ ಜೈನ್, ಉಪವಿಭಾಗಾಧಿಕಾರಿ ಸಿ.ಡಿ ಗೀತಾ, ಸಮಾಜ ಕಲ್ಯಾಣ ಇಲಾಖೆ ಪ್ರಭಾರಿ ಉಪನಿರ್ದೇಶಕ ಈರಣ್ಣ ಆಶಾಪೂರ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ದೌರ್ಜನ್ಯ ನಿಯಂತ್ರಣ, ಜಿಲ್ಲಾ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸದಸ್ಯರು ಉಪಸ್ಥಿತರಿದ್ದರು.  ಸಭೆಯಲ್ಲಿ ಎಸ್.ಸಿ.ಪಿ ಮತ್ತು ಟಿ.ಎಸ್.ಪಿ ಯೋಜನೆಯಡಿ ಅನುದಾನ ಪ್ರಗತಿ ಸಂಬಂಧ ವಿವಿಧ ಇಲಾಖೆಗಳ ಅಧಿಕಾರಿಗಳಿಂದ ಮಾಹಿತಿ ಪಡೆಯಲಾಯಿತು.

Please follow and like us:
error