ರಾಜ್ಯಮಟ್ಟದಲ್ಲಿ ಜಯಗಳಿಸಿ ಜಿಲ್ಲೆಗೆ ಕೀರ್ತಿ ತನ್ನಿ : ವಿಕಾಸ್ ಕಿಶೋರ್ ಸುರಳ್ಕರ್

ಸರ್ಕಾರಿ ನೌಕರರ ಕ್ರೀಡಾಕೂಟ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮದ ಸಮಾರೋಪ ಸಮಾರಂಭ

ಕೊಪ್ಪಳ, : ಎಲ್ಲ ಸರ್ಕಾರಿ ನೌಕರರು ಕ್ರೀಡಾಕೂಟದಲ್ಲಿ ಭಾಗವಹಿಸಿದ್ದೀರಿ. ಇಲ್ಲಿ ವಿಜೇತರಾದ ಕ್ರೀಡಾಪಟುಗಳು ರಾಜ್ಯಮಟ್ಟಕ್ಕೆ ಆಯ್ಕೆಯಾಗಿ ಅಲ್ಲಿಯೂ ಜಯಗಳಿಸುವ ಮೂಲಕ ಜಿಲ್ಲೆಗೆ ಕೀರ್ತಿ ತರಬೇಕು ಎಂದು ಜಿಲ್ಲಾಧಿಕಾರಿ ವಿಕಾಸ್ ಕಿಶೋರ್ ಸುರಳ್ಕರ್ ಹೇಳಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾ ಶಾಖೆಯ ಆಶ್ರಯದಲ್ಲಿ ಕೊಪ್ಪಳದ ಜಿಲ್ಲಾ ಕ್ರೀಡಾಂಗಣದ ಸಭಾಂಗಣದಲ್ಲಿ ಶುಕ್ರವಾರ (ಫೆ. 5) ನಡೆದ ಜಿಲ್ಲಾಮಟ್ಟದ ರಾಜ್ಯ ಸರ್ಕಾರಿ ನೌಕರರ ಕ್ರೀಡಾಕೂಟ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮದ ಸಮಾರೋಪ ಸಮಾರಂಭದಲ್ಲಿ ಅವರು ಮಾತನಾಡಿದರು.
ಸರ್ಕಾರಿ ನೌಕರರು ಎರಡು ದಿನದ ಕ್ರೀಡಾಕೂಟದಲ್ಲಿ ಭಾಗವಹಿಸದೇ ಯಾವುದಾದರೊಂದು ಕ್ರೀಡೆಯನ್ನು ಆಯ್ಕೆ ಮಾಡಿಕೊಂಡು ನಿರಂತರವಾಗಿ ಪ್ರತಿದಿನ ಒಂದು ಕ್ರೀಡೆಯನ್ನು ಆಯ್ಕೆಮಾಡಿಕೊಂಡು ಅಭ್ಯಾಸ ಮಾಡುವ ಮೂಲಕ ದೈಹಿಕ ಹಾಗೂ ಮಾನಸಿಕ ಸಾಮರ್ಥ್ಯ ಹೆಚ್ಚಿಸಿಕೊಳ್ಳಬೇಕು. ಕೆಲವೊಂದು ಕ್ರೀಡೆಗಳಲ್ಲಿ ಹೆಚ್ಚಿನ ಕ್ರೀಡಾಪಟುಗಳು ಲಭ್ಯವಿರುತ್ತಾರೆ, ಕೆಲವೊಂದು ಕ್ರೀಡೆಗಳಿಗೆ ಕ್ರೀಡಾಪಟುಗಳೇ ಲಭ್ಯವಿರುವುದಿಲ್ಲ. ಅಂತಹ ಕ್ರೀಡೆಗಳನ್ನು ಆಯ್ಕೆ ಮಾಡಿಕೊಂಡು ಯಶಸ್ಸು ಸಾಧಿಸಬೇಕು ಎಂದರು.
ಸರ್ಕಾರಿ ನೌಕರರು ಅತ್ಯಂತ ಹೆಚ್ಚಿನ  ಒತ್ತಡದಲ್ಲಿ ಕಾರ್ಯನಿರ್ವಹಿಸುತ್ತಿರುವುದರಿಂದ ಒತ್ತಡದಿಂದ ಮುಕ್ತಿ ಹೊಂದಲು ಕ್ರೀಡೆ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳು ಹೆಚ್ಚು ಸಹಕಾರಿಯಾಗಿವೆ. ಜಿಲ್ಲೆಯ ಸರ್ಕಾರಿ ನೌಕರರು ದಕ್ಷತೆಯಿಂದ ಕಾರ್ಯನಿರ್ವಹಿಸುತ್ತಿದ್ದು, ಸರ್ಕಾರದ ಯೋಜನೆಗಳನ್ನು ಸಾರ್ವಜನಿಕರಿಗೆ ಮುಟ್ಟಿಸುವಲ್ಲಿ ಪ್ರಾಮಾಣಿಕವಾಗಿ ಸೇವೆ ಸಲ್ಲಿಸುತ್ತಿರುವುದು ಅಭಿನಂದನಾರ್ಹವಾಗಿದೆ. ಜಿಲ್ಲೆಯ ನೌಕರರ ಸಂಘದ ಅಧ್ಯಕ್ಷರು ಸರ್ಕಾರಿ ನೌಕರರ ಕುಂದು ಕೊರತೆಗಳನ್ನು ಈಗಾಗಲೇ ನಮ್ಮ ಗಮನಕ್ಕೆ ತಂದಿದ್ದು, ಕುಂದುಕೊರತೆಗಳ ನಿವಾಹರಣೆಗೆ ಜಿಲ್ಲಾಡಳಿತ ಕ್ರಮವಹಿಸುತ್ತದೆ ಎಂದು ಭರವಸೆ ನೀಡಿದರು.
ಸೋಲು-ಗೆಲುವು ಮುಖ್ಯವಲ್ಲ. ಭಾಗವಹಿಸುವುದು ಮುಖ್ಯ. ಕ್ರೀಡಾಕೂಟವನ್ನು ಉತ್ತಮವಾಗಿ ನಿರ್ವಹಿಸುತ್ತಿರುವುದು ಸಂತಸ ತಂದಿದೆ. ದೈಹಿಕ ಶಿಕ್ಷಕರಿಗೆ ಹಾಗೂ ಅಂಗವಿಕಲ ನೌಕರರಿಗೆ ಕ್ರೀಡೆ ಆಯೋಜಿಸಲು ಮನವಿ ಸಲ್ಲಿಸಿದ್ದರಿಂದ ಹಿಂದಿನ ವರ್ಷದಂತೆ ಈ ವರ್ಷವೂ ಜಿಲ್ಲೆಯಲ್ಲಿ ಪ್ರತ್ಯೇಕವಾಗಿ ಕ್ರೀಡಾಕೂಟ ಹಮ್ಮಿಕೊಳ್ಳಲಾಗಿದ್ದು, ಹೆಚ್ಚು ನೌಕರರು ತೊಡಗಿಸಿಕೊಳ್ಳಬೇಕು ಎಂದರು.
ಸರ್ಕಾರಿ ನೌಕರರ ಸಂಘದ ಜಿಲ್ಲಾ ಅಧ್ಯಕ್ಷ ನಾಗರಾಜ್ ಜುಮ್ಮಣ್ಣನವರ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಉಪನಿರ್ದೇಶಕ ಅಮೃತ ಅಷ್ಟಗಿ, ಸಂಘದ ಕಾರ್ಯದರ್ಶಿ ಶಂಕರಗೌಡ ಮಾಲಿಪಾಟೀಲ, ಗೌರವಾಧ್ಯಕ್ಷ ಮುಸ್ತಫಾ ಕುದರಿಮೋತಿ, ಖಜಾಂಚಿ ಸುಶಿಲೇಂದ್ರರಾವ್ ದೇಶಪಾಂಡೆ, ಕಾರ್ಯಾಧ್ಯಕ್ಷ ಶಿವಪ್ಪ ಜೋಗಿ, ಪಿಆರ್ ಡಿಎಲ್ ನೌಕರರ ಸಂಘದ ರಾಜ್ಯಾಧ್ಯಕ್ಷ ಶರಣಯ್ಯ ಶಶಿಮಠ, ಜಿಲ್ಲೆಯ ವಿವಿಧ ವೃಂದ ಅಧ್ಯಕ್ಷರು ಇದ್ದರು.

Please follow and like us:
error