ಕೊಪ್ಪಳ, :: ಜಿಲ್ಲಾಡಳಿತದಿಂದ ಡಿ.03 ರಂದು ಶ್ರೀ ಭಕ್ತ ಕನಕದಾಸ ಜಯಂತಿಯನ್ನು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸರಳವಾಗಿ ಆಚರಿಸಲಾಗುವುದು ಎಂದು ಅಪರ ಜಿಲ್ಲಾಧಿಕಾರಿ ಎಂ.ಪಿ.ಮಾರುತಿ ಹೇಳಿದರು.
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಇಂದು ಶ್ರೀ ಭಕ್ತ ಕನಕದಾಸರ ಜಯಂತಿ ಆಚರಣೆ ಹಿನ್ನೆಲೆಯಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ಆಯೋಜಿಸಿದ್ದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಜಯಂತಿ ಕಾರ್ಯಕ್ರಮದಲ್ಲಿ ಸಾರ್ವಜನಿಕರು, ಸಮುದಾಯದವರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವುದರಿಂದ ಕೋವಿಡ್-19 ಸೋಂಕಿನ ಹರಡುವಿಕೆ ಸಾಧ್ಯತೆ ಇರುತ್ತದೆ. ಆದ್ದರಿಂದ ಕೋವಿಡ್-19 ಹಿನ್ನೆಲೆಯಲ್ಲಿ ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ಜಿಲ್ಲಾಡಳಿತದ ವತಿಯಿಂದ ಸರಳವಾಗಿ ಜಯಂತಿಯನ್ನು ಆಚರಿಸಲಾಗುವುದು ಎಂದು ಅವರು ಹೇಳಿದರು.
ಡಿ.03 ರಂದು ಬೆಳಿಗ್ಗೆ 09.30 ಗಂಟೆಗೆ ನಗರದ ಕನಕದಾಸ ವೃತ್ತದಲ್ಲಿ ಕನಕದಾಸರ ಭಾವಚಿತ್ರಕ್ಕೆ ಪುಷ್ಪಾರ್ಪಣೆ ಮಾಡಲಾಗುವುದು. ನಂತರ ಬೆಳಿಗ್ಗೆ 10.30 ಗಂಟೆಗೆ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶ್ರೀ ಕನಕದಾಸರ ಭಾವಚಿತ್ರಕ್ಕೆ ಪುಷ್ಪಾರ್ಪಣೆ ಮಾಡಲಾಗುವುದು ಎಂದು ತಿಳಿಸಿದ ಅಪರ ಜಿಲ್ಲಾಧಿಕಾರಿಗಳು ಈ ಕಾರ್ಯಕ್ರಮಗಳಲ್ಲಿ ಭಾಗವಹಿಸುವ ಸಮುದಾಯದವರು ಹಾಗೂ ಸಾರ್ವಜನಿಕರು ಕಡ್ಡಾಯವಾಗಿ ಮಾಸ್ಕ್ನ್ನು ಧರಿಸಿ ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳಬೇಕು ಎಂದು ಮನವಿ ಮಾಡಿದರು.
ಸಭೆಯಲ್ಲಿ ಸಹಾಯಕ ಆಯುಕ್ತರಾದ ನಾರಾಯಣರೆಡ್ಡಿ ಕನಕರೆಡ್ಡಿ, ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಸಿದ್ರಾಮೇಶ್ವರ, ಜಿಲ್ಲಾ ಸಾಂಖ್ಯಿಕ ಅಧಿಕಾರಿ ಕೃಷ್ಣಮೂರ್ತಿ ದೇಸಾಯಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ನೀಲಕಂಠಪ್ಪ ಕಂಬಳಿ, ಸಮುದಾಯದ ಮುಖಂಡರಾದ ಬಸವರಾಜ ಹಿಟ್ನಾಳ, ಗವಿಸಿದ್ದಪ್ಪ ಹಿಟ್ನಾಳ, ದ್ಯಾಮಣ್ಣ ಕರಿಗಾರ, ಮಂಜುನಾಥ ಬಂಗಾಳಿ, ಸೋಮಶೇಖರ ಮೇಟಿ, ಎಚ್.ಎಚ್.ಮೇಟಿ, ಆನಂದ ಹಿಟ್ನಾಳ, ದ್ಯಾಮಣ್ಣ ಚಿಲವಾಡಗಿ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.
ಶ್ರೀ ಭಕ್ತ ಕನಕದಾಸರ ಜಯಂತಿಯನ್ನು ಸರಳವಾಗಿ ಆಚರಿಸಲಾಗುವುದು: ಎಂ.ಪಿ.ಮಾರುತಿ
Please follow and like us: