ಸೆ. ೨೨ ರಂದು ಮುಖ್ಯಮಂತ್ರಿಗಳ ಕಾರ್ಯಕ್ರಮ : ಉತ್ತಮ ವ್ಯವಸ್ಥೆ ಒದಗಿಸಲು ಸೂಚನೆ

ಕೊಪ್ಪಳ ಜಿಲ್ಲೆಯಲ್ಲಿನ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಮುಖ್ಯಮಂತ್ರಿಗಳಿಂದ ಚಾಲನೆ ಹಾಗೂ ವಿವಿಧ ಯೋಜನೆಗಳ ಫಲಾನುಭವಿಗಳ ಸಮಾವೇಶ ಕಾರ್ಯಕ್ರಮ ಕೊಪ್ಪಳದಲ್ಲಿ ಸೆಪ್ಟಂಬರ್ ೨೨ ರಂದು, ಜರುಗಲಿದ್ದು, ಕಾರ್ಯಕ್ರಮಕ್ಕೆ ಆಗಮಿಸುವ ಫಲಾನುಭವಿಗಳಿಗೆ ಊಟೋಪಹಾರದ ವ್ಯವಸ್ಥೆಯನ್ನು ಸಮರ್ಪಕವಾಗಿ ಕೈಗೊಳ್ಳುವಂತೆ ಜಿಲ್ಲಾ ಉಸ್ತುವಾರಿ ಮತ್ತು ಉನ್ನತ ಶಿಕ್ಷಣ ಮಂತ್ರಿಗಳಾದ ಬಸವರಾಜ ರಾಯರಡ್ಡಿ ಅವರು ಸೂಚನೆ ನೀಡಿದರು.   ಜಿಲ್ಲೆಯಲ್ಲಿ ಮುಖ್ಯಮಂತ್ರಿಗಳ ಕಾರ್ಯಕ್ರಮ ಕುರಿತಂತೆ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಕೊಪ್ಪಳ ಜಿಲ್ಲೆಯಲ್ಲಿ ನಾನಾ ಇಲಾಖೆಗಳ ಮೂಲಕ ಅನುಷ್ಠಾನಗೊಳಿಸಲಾಗುತ್ತಿರುವ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆ ನೆರವೇರಿಸುವ ಬೃಹತ್ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಮುಖ್ಯಮಂತ್ರಿಗಳು ಸೆಪ್ಟಂಬರ್ ೨೨ ರಂದು ಜಿಲ್ಲೆಗೆ ಆಗಮಿಸುವರು.  ಇದೇ ಸಂದರ್ಭದಲ್ಲಿ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳಾದ ಅನ್ನಭಾಗ್ಯ, ವಸತಿಭಾಗ್ಯ, ಕೃಷಿಭಾಗ್ಯ, ರೈತರ ಸಾಲ ಮನ್ನಾ, ಪಶುಭಾಗ್ಯ ಮುಂತಾದ ಯೋಜನೆಗಳ ಫಲಾನುಭವಿಗಳ ಬೃಹತ್ ಸಮಾವೇಶವನ್ನು ಕೊಪ್ಪಳ ನಗರದ ಹೊಸಪೇಟೆ ರಸ್ತೆಯಲ್ಲಿ ಬೃಹತ್ ಮೈದಾನದಲ್ಲಿ ಆಯೋಜಿಸಲಾಗುತ್ತಿದೆ. ಮುಖ್ಯಮಂತ್ರಿಗಳ ಕಾರ್ಯಕ್ರಮದಲ್ಲಿ ಸರ್ಕಾರಿ ಯೋಜನೆಗಳಿಗೆ ಸಂಬಂಧಿಸಿದಂತೆ ಕಲಾವಿದರಿಂದ ರೂಪಕ ಕಾರ್ಯಕ್ರಮವನ್ನು ಆಯೋಜಿಸಲಾಗುತ್ತಿದ್ದು, ಇಂತಹ ಕಾರ್ಯಕ್ರಮವನ್ನು ರಾಜ್ಯದಲ್ಲಿ ಇದೇ ಮೊದಲು ಮುಖ್ಯಮಂತ್ರಿಗಳು ಭಾಗವಹಿಸುವ ಸಮಾರಂಭದಲ್ಲಿ ಏರ್ಪಡಿಸಲಾಗುತ್ತಿದೆ.  ಅಲ್ಲದೆ ಫಲಾನುಭವಿಗಳು ವೇದಿಕೆಯಲ್ಲಿ ಯೋಜನೆಗೆ ಸಂಬಂಧಿಸಿದಂತೆ ಅಭಿಪ್ರಾಯ ವ್ಯಕ್ತಪಡಿಸಲು ಅವಕಾಶ ಕಲ್ಪಿಸಲಾಗುತ್ತಿದೆ. ಈ ಕಾರ್ಯಕ್ರಮವನ್ನು ಅತ್ಯಂತ ಯಶಸ್ವಿಯಾಗಿ ಆಯೋಜಿಸಲು ಈಗಾಗಲೆ ಹಲವು ಸಮಿತಿಗಳನ್ನು ರಚಿಸಲಾಗಿದೆ.  ಮುಖ್ಯಮಂತ್ರಿಗಳ ಕಾರ್ಯಕ್ರಮಕ್ಕೆ ವಿವಿಧ ಪ್ರಕಾರಗಳ ಕಲಾತಂಡಗಳನ್ನು ಕರೆಸಬೇಕು.  ಕಾರ್ಯಕ್ರಮದ ಆವರಣದಲ್ಲಿ ಸಂಭ್ರಮದ ವಾತಾವರಣ ನಿರ್ಮಾಣವಾಗಬೇಕು.  ಇದಕ್ಕಾಗಿ ಅಗತ್ಯವಿರುವ ಸುಮಾರು ೧೫ ಕಲಾತಂಡಗಳ ವ್ಯವಸ್ಥೆಗೊಳಿಸುವಂತೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಅಧಿಕಾರಿಗಳು ಕ್ರಮ ವಹಿಸಬೇಕು.  ಸುಮಾರು ಒಂದು ಸಾವಿರಕ್ಕೂ ಹೆಚ್ಚು ವಾಹನಗಳು ಆಗಮಿಸುವುದರಿಂದ ಪಾರ್ಕಿಂಗ್ ವ್ಯವಸ್ಥೆಯನ್ನು ಸೂಕ್ತವಾಗಿ ಕೈಗೊಳ್ಳಬೇಕು.  ಆಯಾ ಸಮಿತಿಗಳ ನೇತೃತ್ವ ವಹಿಸಿರುವ ಅಧಿಕಾರಿಗಳು, ತಮ್ಮ ಹೊಣೆಗಾರಿಕೆಯನ್ನು ಸೂಕ್ತ ರೀತಿಯಲ್ಲಿ ನಿಭಾಯಿಸಬೇಕು.  ವೇದಿಕೆ ನಿರ್ಮಾಣದ ವ್ಯವಸ್ಥೆಯನ್ನು ಅಚ್ಚುಕಟ್ಟಾಗಿ ಕೈಗೊಳ್ಳಬೇಕು.  ಆಹಾರ ಸಮಿತಿಯವರು ಫಲಾನುಭವಿಗಳಿಗೆ ಊಟ ಒದಗಿಸಲು ಅಗತ್ಯವಿರುವ ಕೌಂಟರ್‌ಗಳ ಸಂಖ್ಯೆಯನ್ನು ನಿಗದಿಪಡಿಸಿಕೊಂಡು, ಫಲಾನುಭವಿಗಳಿಗೆ ಊಟೋಪಾಹರದ ವ್ಯವಸ್ಥೆಯನ್ನು ಉತ್ತಮವಾಗಿ ಒದಗಿಸಬೇಕು. ಮುಖ್ಯಮಂತ್ರಿಗಳ ಕಾರ್ಯಕ್ರಮವನ್ನು ಒಟ್ಟಾರೆ ಅಚ್ಚುಕಟ್ಟಾಗಿ ಆಯೋಜಿಸಲು ಎಲ್ಲ ಅಧಿಕಾರಿಗಳು ತಮಗೆ ಒಪ್ಪಿಸಿರುವ ಹೊಣೆಯನ್ನು ಚಾಚೂ ತಪ್ಪದೆ ನಿರ್ವಹಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಮಂತ್ರಿಗಳು ಅಧಿಕಾರಿಗಳಿಗೆ ಸೂಚನೆ ನೀಡಿದರು.  ಸಭೆಯಲ್ಲಿ ಜಿಲ್ಲಾಧಿಕಾರಿ ಎಂ. ಕನಗವಲ್ಲಿ, ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ವೆಂಕಟರಾಜಾ,  ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಅನೂಪ್ ಶೆಟ್ಟಿ, ಅಪರ ಜಿಲ್ಲಾಧಿಕಾರಿ ಡಾ. ರುದ್ರೇಶ್ ಘಾಳಿ, ಉಪವಿಭಾಗಾಧಿಕಾರಿ ಗುರುದತ್ ಹೆಗ್ಡೆ, ಸೇರಿದಂತೆ ಲೋಕೋಪಯೋಗಿ, ಆಹಾರ, ಸಹಕಾರ, ತೋಟಗಾರಿಕೆ, ಕೃಷಿ ಹಾಗೂ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು, ತಾಲೂಕುಗಳ ತಹಸಿಲ್ದಾರರು ಸಭೆಯಲ್ಲಿ ಪಾಲ್ಗೊಂಡಿದ್ದರು.

Please follow and like us:
error