You are here
Home > Koppal News > ಫೆ. ೧೯ ರಂದು ಛತ್ರಪತಿ ಶಿವಾಜಿ ಜಯಂತಿ ಆಚರಣೆಗೆ ನಿರ್ಧಾರ : ಡಾ. ರುದ್ರೇಶ ಘಾಳಿ

ಫೆ. ೧೯ ರಂದು ಛತ್ರಪತಿ ಶಿವಾಜಿ ಜಯಂತಿ ಆಚರಣೆಗೆ ನಿರ್ಧಾರ : ಡಾ. ರುದ್ರೇಶ ಘಾಳಿ

ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯನ್ನು ಫೆ. ೧೯ ರಂದು ವಿಜೃಂಭಣೆಯಿಂದ ಜಿಲ್ಲಾ ಕೇಂದ್ರದಲ್ಲಿ ಆಚರಿಸಲು ನಿರ್ಧರಿಸಲಾಗಿದೆ ಎಂದು ಕೊಪ್ಪಳ ಅಪರ ಜಿಲ್ಲಾಧಿಕಾರಿ ಡಾ. ರುದ್ರೇಶ್ ಘಾಳಿ ಅವರು ಹೇಳಿದರು.
ಛತ್ರಪತಿ ಶಿವಾಜಿ ಮಹಾರಾಜರವರ ಜಯಂತಿ ಆಚರಣೆ ಸಂಬಂಧ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸೋಮವಾರದಂದು ಏರ್ಪಡಿಸಲಾಗಿದ್ದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಭಾರತದಲ್ಲಿ ಸ್ವರಾಜ್ಯದ ಕಲ್ಪನೆಯನ್ನು ಹುಟ್ಟುಹಾಕಿದ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿ ಆಚರಣೆಯನ್ನು ಫೆ. ೧೯ ರ ರಂದು ಕೊಪ್ಪಳ ಜಿಲ್ಲಾ ಕೇಂದ್ರದಲ್ಲಿ ಆಯೋಜಿಸಲಾಗುವುದು. ಅಂದು ಬೆಳಿಗ್ಗೆ ೧೦ ಗಂಟೆಗೆ ನಗರದ ಸಾಹಿತ್ಯ ಭವನದಲ್ಲಿ ವೇದಿಕೆ ಸಮಾರಂಭ ಏರ್ಪಡಿಸಲಾಗುವುದು. ಕಾರ್ಯಕ್ರಮದ ಅಂಗವಾಗಿ ಶಿವಾಜಿ ಮಹಾರಾಜರ ಕುರಿತು ವಿಶೇಷ ಉಪನ್ಯಾಸ ನೀಡಲು ಭಾಗ್ಯನಗರ ಕಾಲೇಜಿನ ಪ್ರಾಧ್ಯಾಪಕ ಗೋವಿಂದಪ್ಪ ಬಡಿಗೇರ ಅವರನ್ನು ಆಹ್ವಾನಿಸಲಾಗುವುದು. ವೇದಿಕೆ ಕಾರ್ಯಕ್ರಮದ ಬಳಿಕ ಛತ್ರಪತಿ ಶಿವಾಜಿ ಮಹಾರಾಜರ ಭಾವಚಿತ್ರದೊಂದಿಗೆ ಮೆರವಣಿಗೆ ಪ್ರಾರಂಭವಾಗಲಿದ್ದು, ಜವಾಹರ ರಸ್ತೆ, ಗಡಿಯಾರ ಕಂಬ, ವಾರಕಾರ ಓಣಿ ಮೂಲಕ ನಗರದ ತುಳಜಾ ಭವಾನಿ ದೇವಸ್ಥಾನದವರೆಗೆ ಸಾಗಲಿದೆ. ಮೆರವಣಿಗೆಯಲ್ಲಿ ವಿಶೇಷ ಕಲಾ ತಂಡಗಳು ಪಾಲ್ಗೊಂಡು ಮೆರವಣಿಗೆಯನ್ನು ಆಕರ್ಷಕಗೊಳಿಸಲಿವೆ. ಶಿವಾಜಿ ಮಹಾರಾಜರ ಜಯಂತಿ ಆಚರಣೆ ಕಾರ್ಯಕ್ರಮ ದಿನದಂದು, ರಸ್ತೆ ಸ್ವಚ್ಛತೆ, ಮೆರವಣಿಗೆಯಲ್ಲಿ ಹಾಗೂ ವೇದಿಕೆ ಸಮಾರಂಭದಲ್ಲಿ ಪಾಲ್ಗೊಳ್ಳುವ ಜನರಿಗೆ ಕುಡಿಯುವ ನೀರಿನ ವ್ಯವಸ್ಥೆ ಕೈಗೊಳ್ಳಬೇಕು. ಅಗತ್ಯ ಪೊಲೀಸ್ ಬಂದೋಬಸ್ತ್ ಕೈಗೊಳ್ಳಬೇಕು ಎಂದು ಅಪರ ಜಿಲ್ಲಾದಿಕಾರಿಗಳು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು. ಕಾರ್ಯಕ್ರಮದ ಯಶಸ್ವಿಗೆ ಎಲ್ಲ ಸಮಾಜದ ಮುಖಂಡರು, ಸಾರ್ವಜನಿಕರು ಸಹಕರಿಸಬೇಕು ಎಂದು ಅವರು ಮನವಿ ಮಾಡಿದರು.
ಸಭೆಯಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಯು. ನಾಗರಾಜ, ಜಿಲ್ಲಾ ಸಂಖ್ಯಾ ಸಂಗ್ರಹಣಾಧಿಕಾರಿ ಕೃಷ್ಣಮೂರ್ತಿ ದೇಸಾಯಿ, ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು, ಗಣ್ಯರು ಹಾಗೂ ಸಮಾಜದ ಮುಖಂಡರುಗಳು ಭಾಗವಹಿಸಿ, ಉಪಯುಕ್ತ ಸಲಹೆ ಸೂಚನೆಗಳನ್ನು ನೀಡಿದರು.

Top