ಬೇಡಿಕೆಗೆ ತಕ್ಕಂತೆ ಉದ್ಯೋಗಖಾತ್ರಿ ಯೋಜನೆಯಡಿ ಕೆಲಸ ನೀಡಿ: ಕರಡಿ ಸಂಗಣ್ಣ

ಕೊಪ್ಪಳ : ಗ್ರಾಮೀಣ ಪ್ರದೇಶದ ಜನರು ಗುಳೇ ಹೋಗುವುದನ್ನು ತಡೆಯಲು ಬೇಡಿಕೆಗೆ ಅನುಗುಣವಾಗಿ ಕೂಲಿಕಾರರಿಗೆ ಮಹಾತ್ಮಾ ಗಾಂಧೀಜಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗಖಾತ್ರಿ ಯೋಜನೆಯಡಿ ಸಮರ್ಪಕ ಉದ್ಯೋಗ ನೀಡುವಂತೆ ಸಂಸದ ಕರಡಿ ಸಂಗಣ್ಣ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.

  ಜಿಲ್ಲಾ ಪಂಚಾಯತಿ ಸಭಾಂಗಣದಲ್ಲಿ ಇಂದು ಏರ್ಪಡಿಸಲಾಗಿದ್ದ ಕೊಪ್ಪಳ ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ ಸಮಿತಿಯ (ದಿಶಾ) ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಜಿಲ್ಲೆಯಲ್ಲಿ ಈ ವರ್ಷ ಭೀಕರ ಬರ ಪರಿಸ್ಥಿತಿ ತಲೆದೋರಿದೆ.  ಮುಂಗಾರು ಮತ್ತು ಹಿಂಗಾರು ಮಳೆ ವಿಫಲಗೊಂಡ ಕಾರಣದಿಂದ ಗ್ರಾಮೀಣ ಪ್ರದೇಶದಲ್ಲಿ ರೈತರು, ಕೂಲಿಕಾರರಿಗೆ ಉದ್ಯೋಗದ ತೊಂದರೆಯಾಗಿದ್ದು, ಕೆಲಸ ಅರಸಿಕೊಂಡು ಗುಳೇ ಹೋಗುತ್ತಿರುವ ಬಗ್ಗೆ ಮಾಧ್ಯಮಗಳಲ್ಲಿ ವರದಿ ಪ್ರಕಟವಾಗುತ್ತಿವೆ.  ಉದ್ಯೋಗಕ್ಕಾಗಿ ಫಾರಂ 06 ಅನ್ನು ಭರ್ತಿ ಮಾಡಿಕೊಡುವ ಬಗ್ಗೆ ಜನರಲ್ಲಿ ಮಾಹಿತಿಯ ಕೊರತೆ ಇದೆ.  ಗ್ರಾಮ ಪಂಚಾಯತಿ ಮಟ್ಟದಲ್ಲಿ ಉದ್ಯೋಗಖಾತ್ರಿ ಯೋಜನೆ ಬಗ್ಗೆ ವ್ಯಾಪಕ ಪ್ರಚಾರ ಮಾಡಬೇಕು. ಉದ್ಯೋಗಕ್ಕಾಗಿ ಬೇಡಿಕೆ ಸಲ್ಲಿಸುವ ಕೂಲಿಕಾರರಿಗೆ ಬೇಡಿಕೆಗೆ ತಕ್ಕಂತೆ ಉದ್ಯೋಗಖಾತ್ರಿ ಯೋಜನೆಯಡಿ ಕೆಲಸ ನೀಡಬೇಕು.  ಇದಕ್ಕಾಗಿ ಪ್ರತಿಯೊಂದು ಗ್ರಾಮ ಪಂಚಾಯತಿ ಮಟ್ಟದಲ್ಲಿ ಕೆರೆ ಹೂಳೆತ್ತುವುದು ಸೇರಿದಂತೆ ಸಾಮೂಹಿಕ ಕೆಲಸ ನೀಡುವಂತಹ ಕಾಮಗಾರಿಗಳನ್ನು ಪ್ರಾರಂಭಿಸಬೇಕು.  ಸ್ಥಳೀಯ ಮಟ್ಟದಲ್ಲಿ ಉದ್ಯೋಗ ಕೊಟ್ಟಲ್ಲಿ, ಜನ ಗುಳೇ ಹೋಗುವುದನ್ನು ಕೈಬಿಡುತ್ತಾರೆ ಎಂದು ಸಂಸದ ಕರಡಿ ಸಂಗಣ್ಣ ಅವರು ಹೇಳಿದರು.  ಇದಕ್ಕೆ ಪ್ರತಿಕ್ರಿಯಿಸಿ ಜಿ.ಪಂ. ಉಪಕಾರ್ಯದರ್ಶಿ ಎನ್.ಕೆ. ತೊರವಿ ಅವರು, ಈ ವರ್ಷದ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ಎದುರಿಸುವ ನಿಟ್ಟಿನಲ್ಲಿ ಜಿಲ್ಲಾ ಪಂಚಾಯತಿ ಈಗಾಗಲೆ ಸಿದ್ಧತೆಗಳನ್ನು ಕೈಗೊಂಡಿದೆ.  ಉದ್ಯೋಗಖಾತ್ರಿ ಯೋಜನೆಯಡಿ ಪ್ರಸಕ್ತ ವರ್ಷ 97. 82 ಕೋಟಿ ರೂ. ಗಳ ಅನುದಾನವನ್ನು ನಿಗದಿಪಡಿಸಲಾಗಿತ್ತು.  ಆದರೆ ಬರಗಾಲವನ್ನು ಸಮರ್ಥವಾಗಿ ಎದುರಿಸುವ ಸಲುವಾಗಿ ಜಿಲ್ಲೆಗೆ 32. 90 ಕೋಟಿ ರೂ. ಗಳ ಹೆಚ್ಚುವರಿ ಅನುದಾನ ಸೇರಿದಂತೆ ಒಟ್ಟು 130. 40 ಕೋಟಿ ರೂ. ಅನುದಾನ ನಿಗದಿಪಡಿಸಲಾಗಿದ್ದು, 24. 68 ಲಕ್ಷ ಮಾನವ ದಿನಗಳ ಸೃಜನೆಯ ಗುರಿಯನ್ನು ಪರಿಷ್ಕರಿಸಿ, ಹೆಚ್ಚುವರಿಯಾಗಿ 8. 23 ಲಕ್ಷ ಮಾನವ ದಿನಗಳು ಸೇರಿದಂತೆ ಒಟ್ಟು 32. 90 ಲಕ್ಷ ಮಾನವದಿನಗಳನ್ನು ಸೃಜಿಸುವ ಗುರಿ ಹಾಕಿಕೊಳ್ಳಲಾಗಿದೆ. ಈವರೆಗೆ 1911235 ಮಾನವದಿನಗಳನ್ನು ಸೃಜಿಸಲಾಗಿದ್ದು, 71. 71 ಕೋಟಿ ರೂ. ಅನುದಾನ ವೆಚ್ಚ ಮಾಡಲಾಗಿದೆ.  ಗ್ರಾ.ಪಂ. ಉದ್ಯೋಗ ಸೃಜನೆ ಕಾಮಗಾರಿಗಳನ್ನು ಪ್ರಾರಂಭಿಸಲಾಗಿದೆ.  ಕೆರೆ ಹೂಳೆತ್ತುವಂತಹ ಕಾಮಗಾರಿಗಳಿಗೆ ಆದ್ಯತೆ ನೀಡಿ, ಹೆಚ್ಚು, ಹೆಚ್ಚು ಕೂಲಿಕಾರರಿಗೆ ಉದ್ಯೋಗ ನೀಡಲಾಗುತ್ತಿದೆ.  ಉದ್ಯೋಗಖಾತ್ರಿ ಯೋಜನೆ ಕುರಿತು ಗ್ರಾಮ ಮಟ್ಟದಲ್ಲಿ ಹೆಚ್ಚು, ಹೆಚ್ಚು ಪ್ರಚಾರ ಮಾಡಲಾಗುತ್ತಿದೆ ಎಂದರು.ಅಗತ್ಯಕ್ಕನುಗುಣವಾಗಿ ಗೋಶಾಲೆ ಪ್ರಾರಂಭಿಸಿ : ಜಿಲ್ಲೆಯಲ್ಲಿ ಸುಮಾರು 3 ಲಕ್ಷದಷ್ಟು ಜಾನುವಾರುಗಳಿದ್ದು, ಕೇವಲ 05 ಗೋಶಾಲೆಗಳನ್ನು ಪ್ರಾರಂಭಿಸಲಾಗಿದೆ. ಮುಂಗಾರು ಮತ್ತು ಹಿಂಗಾರು ಮಳೆಯ ವಿಫಲತೆಯಿಂದಾಗಿ ಮೇವಿನ ಕೊರತೆ ಇದೆ.  ಇನ್ನೂ ಹೆಚ್ಚು ಗೋಶಾಲೆಗಳನ್ನು ಪ್ರಾರಂಭಿಸುವ ಅಗತ್ಯವಿದೆ ಎಂದು ಸಂಸದ ಕರಡಿ ಸಂಗಣ್ಣ ಅವರು ಹೇಳಿದರು.  ಇದಕ್ಕೆ ಪ್ರತಿಕ್ರಿಯಿಸಿದ ಪಶುಸಂಗೋಪನೆ ಇಲಾಖೆ ಉಪನಿರ್ದೇಶಕ ಡಾ. ಶಿವಣ್ಣ ಅವರು, ಜಿಲ್ಲೆಯಲ್ಲಿ ಸದ್ಯ ತೆರೆಯಲಾಗಿರುವ 05 ಗೋಶಾಲೆಗಳಲ್ಲಿ ಸುಮಾರು 1300 ಜಾನುವಾರುಗಳಿಗೆ ಮೇವು ಒದಗಿಸಲಾಗುತ್ತಿದೆ.  ನೀರಾವರಿ ಭೂಮಿ ಹೊಂದಿರುವ ರೈತರಿಗೆ ಮೇವು ಬೆಳೆಯಲು ಇಲಾಖೆಯಿಂದ ಮೇವು ಬೀಜದ ಕಿಟ್‍ಗಳನ್ನು ನೀಡಲಾಗಿದೆ. ಜಾನುವಾರುಗಳಿಗೆ ಮೇವು ಪೂರೈಸಲು ಟೆಂಡರ್ ಪ್ರಕ್ರಿಯೆ ಪೂರ್ಣಗೊಳಿಸಿ, 08 ಏಜೆನ್ಸಿಗಳಿಗೆ ಮೇವು ಪೂರೈಕೆಗೆ ಕಾರ್ಯಾದೇಶ ನೀಡಲಾಗಿದೆ.  ಅಗತ್ಯಕ್ಕೆ ಅನುಗುಣವಾಗಿ ಏಜೆನ್ಸಿಗಳು ಮೇವು ಪೂರೈಸುತ್ತಿದ್ದು, ಜಾನುವಾರುಗಳಿಗೆ ಯಾವುದೇ ಮೇವಿನ ಕೊರತೆ ಇಲ್ಲ.  ಸದ್ಯ 09 ವಾರಗಳಿಗೆ ಆಗುವಷ್ಟು ಮೇವು ಲಭ್ಯವಿದೆ.  ಬರುವ ದಿನಗಳಲ್ಲಿ ಅಗತ್ಯಕ್ಕೆ ಅನುಗುಣವಾಗಿ ಇನ್ನೂ ಹೆಚ್ಚಿನ ಗೋಶಾಲೆ ತೆರೆಯಲು ಕ್ರಮ ಕೈಗೊಳ್ಳಲಾಗುವುದು ಎಂದರು.

 


ಜಿಲ್ಲಾ ಪಂಚಾಯತಿ ಅಧ್ಯಕ್ಷ ಶೇಖರಪ್ಪ ನಾಗರಳ್ಳಿ, ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ವೆಂಕಟರಾಜಾ, ಅಪರ ಜಿಲ್ಲಾಧಿಕಾರಿ ಡಾ. ರುದ್ರೇಶ್ ಘಾಳಿ, ದಿಶಾ ಸಮಿತಿಯ ಸದಸ್ಯರುಗಳಾದ ಶೋಭಾ ನಗರಿ, ಶಿವನಗೌಡ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮತ್ತು ತಾಲೂಕು ಮಟ್ಟದ ಅಧಿಕಾರಿಗಳು ಪಾಲ್ಗೊಂಡಿದ್ದರು.

Leave a Reply