ಮಡಿವಾಳ ಮಾಚಿದೇವರ ಜಯಂತಿ : ಫೆ. 01 ರಂದು ಸರ್ಕಾರಿ ಕಾರ್ಯಕ್ರಮವಾಗಿ ಆಚರಣೆ- ಡಾ. ರುದ್ರೇಶ್ ಘಾಳಿ

: ಮಡಿವಾಳ ಮಾಚಿದೇವರ ಜಯಂತಿ ಆಚರಣೆಯನ್ನು ಫೆ. 01 ರಂದು ಕೊಪ್ಪಳ ಜಿಲ್ಲಾ ಕೇಂದ್ರದಲ್ಲಿ ಇದೇ ಮೊದಲ ಬಾರಿಗೆ ಸರ್ಕಾರಿ ಕಾರ್ಯಕ್ರಮವಾಗಿ ಆಚರಿಸಲಾಗುವುದು ಎಂದು ಅಪರ ಜಿಲ್ಲಾಧಿಕಾರಿ ಡಾ. ರುದ್ರೇಶ್ ಘಾಳಿ ಅವರು ಹೇಳಿದರು.
ಮಡಿವಾಳ ಮಾಚಿದೇವರ ಜಯಂತಿ ಆಚರಣೆಯನ್ನು ಸರ್ಕಾರಿ ಕಾರ್ಯಕ್ರಮವನ್ನಾಗಿ ಆಚರಿಸುವ ಕುರಿತು ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಗುರುವಾರದಂದು ಏರ್ಪಡಿಸಲಾಗಿದ್ದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು.
ಮಡಿವಾಳ ಮಾಚಿದೇವರ ಜಯಂತಿಯನ್ನು ಫೆ. 01 ರಂದು ಸರ್ಕಾರಿ ಕಾರ್ಯಕ್ರಮವನ್ನಾಗಿ ಕೊಪ್ಪಳದಲ್ಲಿ ಭಕ್ತಿಭಾವದಿಂದ ಆಚರಿಸಲಾಗುವುದು. ಅಂದು ಬೆಳಿಗ್ಗೆ 9 ಗಂಟೆಗೆ ಮಡಿವಾಳ ಮಾಚಿದೇವರ ಭಾವಚಿತ್ರದೊಂದಿಗೆ ಮೆರವಣಿಗೆಯು ನಗರದ ಗಡಿಯಾರ ಕಂಬ ಬಳಿಯ ಅಕ್ಕಮಹಾದೇವಿ ದೇವಸ್ಥಾನದ ಬಳಿಯಿಂದ ಹೊರಟು, ಗಡಿಯಾರ ಕಂಭ, ಜವಾಹರ ರಸ್ತೆ, ಅಶೋಕ ಸರ್ಕಲ್ ಮೂಲಕ ಸಾಹಿತ್ಯ ಭವನದವರೆಗೆ ಸಾಗಿ ಬರಲಿದೆ. ಅಂದು ಬೆಳಿಗ್ಗೆ 11-30 ಗಂಟೆಗೆ ಸಾಹಿತ್ಯ ಭವನದಲ್ಲಿ ವೇದಿಕೆ ಸಮಾರಂಭ ಜರುಗಲಿದೆ.
ಜಯಂತಿ ಆಚರಣೆ ಅಂಗವಾಗಿ ಸಮಾರಂಭದಲ್ಲಿ ವಿಶೇಷ ಉಪನ್ಯಾಸ ನೀಡಲು ಹಿರಿಯ ಸಾಹಿತಿ ಅಲ್ಲಮಪ್ರಭು ಬೆಟ್ಟದೂರ ಅವರನ್ನು ಆಹ್ವಾನಿಸಲಾಗುವುದು. ಜಯಂತಿ ಆಚರಣೆಯಲ್ಲಿ ಎಲ್ಲ ಸಾರ್ವಜನಿಕರು, ಜನಪ್ರತಿನಿಧಿಗಳು, ವಿವಿಧ ಸಂಘಟನೆಗಳು, ಎಲ್ಲ ಸಮಾಜದ ಮುಖಂಡರು ಸಕ್ರಿಯವಾಗಿ ಪಾಲ್ಗೊಂಡು ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು. ಮೆರವಣಿಗೆ ಹಾಗೂ ಸಮಾರಂಭದಲ್ಲಿ ಎಲ್ಲ ಅಧಿಕಾರಿ, ಸಿಬ್ಬಂದಿಗಳು ಪಾಲ್ಗೊಳ್ಳಬೇಕು. ಮೆರವಣಿಗೆ ಸಂದರ್ಭದಲ್ಲಿ ಸೂಕ್ತ ಪೊಲೀಸ್ ಬಂದೋಬಸ್ತ್, ಅಗತ್ಯ ಕುಡಿಯುವ ನೀರಿನ ವ್ಯವಸ್ಥೆ, ಮೆರವಣಿಗೆ ಸಾಗಿ ಬರುವ ರಸ್ತೆಯನ್ನು ಸ್ವಚ್ಛಗೊಳಿಸಲು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಅಪರ ಜಿಲ್ಲಾಧಿಕಾರಿ ಡಾ. ರುದ್ರೇಶ್ ಘಾಳಿ ಅವರು ಹೇಳಿದರು.
ಸಭೆಯಲ್ಲಿ ಜಿಲ್ಲಾ ಸಂಖ್ಯಾ ಸಂಗ್ರಹಣಾಧಿಕಾರಿ ಕೃಷ್ಣಮೂರ್ತಿ ದೇಸಾಯಿ, ಪಶುಸಂಗೋಪನೆ ಇಲಾಖೆ ಉಪನಿರ್ದೇಶಕ ಡಾ. ವೇಣುಗೋಪಾಲ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ರಾಮಕೃಷ್ಣ, ಯುವಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ ಸುದರ್ಶನರಾವ್ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು, ಗಣ್ಯರಾದ ಬಸವರಾಜ ಮಡಿವಾಳರ, ಶಂಕ್ರಪ್ಪ ಮಡಿವಾಳರ, ಗವಿಸಿದ್ದಪ್ಪ ಮಡಿವಾಳರ, ಸಿ.ಎಸ್. ಮಡಿವಾಳರ, ಆರ್.ಯು. ಮಡಿವಾಳರ, ಶಿವಾನಂದ ಹೊದ್ಲೂರ ಸೇರಿದಂತೆ ವಿವಿಧ ಸಮಾಜದ ಮುಖಂಡರು, ವಿವಿಧ ಸಂಘಟನೆಗಳ ಪದಾಧಿಕಾರಿಗಳು ಭಾಗವಹಿಸಿ ಉಪಯುಕ್ತ ಸಲಹೆ ಸೂಚನೆ ನೀಡಿದರು.

Related posts