ಮೇ. ೧೧ ರಿಂದ ಹುಲಿಗೆಮ್ಮ ದೇವಿ ಜಾತ್ರೆ

ಭಕ್ತಾದಿಗಳಿಗೆ ಸಮರ್ಪಕ ವ್ಯವಸ್ಥೆ ಕಲ್ಪಿಸಿ- ಡಿ.ಸಿ ಕನಗವಲ್ಲಿ ಸೂಚನೆ
ಕೊಪ್ಪಳ, ಮೇ. ೦೩ : ಉತ್ತರ ಕರ್ನಾಟಕದ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಹುಲಿಗಿಯ ಶ್ರೀ ಹುಲಿಗೆಮ್ಮ ದೇವಿ ಜಾತ್ರೆ ಮೇ ೧೧ ರಿಂದ ಪ್ರಾರಂಭವಾಗಲಿದ್ದು, ಈ ಸಂದರ್ಭದಲ್ಲಿ ಭಕ್ತಾಧಿಗಳಿಗೆ ಶುದ್ಧ ಕುಡಿಯುವ ನೀರು ಹಾಗೂ ನೆರಳಿನ ವ್ಯವಸ್ಥೆ ಹಾಗೂ ಸ್ವಚ್ಛತೆಗೆ ಹೆಚ್ಚಿನ ಆದ್ಯತೆ ನೀಡುವಂತೆ ಜಿಲ್ಲಾಧಿಕಾರಿ ಎಂ. ಕನಗವಲ್ಲಿ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಹುಲಿಗೆಮ್ಮ ದೇವಿ ಜಾತ್ರಾ ಮಹೋತ್ಸವ ಸಿದ್ಧತೆ ಕುರಿತಂತೆ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಬುಧವಾರದಂದು ಏರ್ಪಡಿಸಲಾಗಿದ್ದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಹುಲಿಗೆಮ್ಮ ದೇವಿಯ ಜಾತ್ರೆಯು ಮೇ.೧೧ ರಿಂದ ೨೨ ರವರೆಗೆ ಜರುಗಲಿದ್ದು, ಪ್ರತಿ ವರ್ಷದಂತೆ ಈ ವರ್ಷವು ವಿಜೃಂಭಣೆಯಿಂದ ನಡೆಯಲಿದೆ. ಮೇ. ೨೦ ರಂದು ಸಂಜೆ ೫.೩೦ ಗಂಟೆಗೆ ಮಹಾರಥೋತ್ಸವ ಜರುಗಲಿದ್ದು, ಜಾತ್ರಾ ಮಹೋತ್ಸವದ ಅಂಗವಾಗಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಜರುಗಲಿವೆ. ಜಾತ್ರೆಗೆ ಆಗಮಿಸುವ ಭಕ್ತಾದಿಗಳಿಗೆ ದೇವಸ್ಥಾನದಲ್ಲಿ ಯಾವುದೇ ತೊಂದರೆಯಾಗದ ರೀತಿಯಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಕೈಗೊಳ್ಳಬೇಕು. ಪಾರ್ಕಿಂಗ್ ವ್ಯವಸ್ಥೆ ದೇವಾಲಯದಿಂದ ಅತಿ ದೂರವಾದಲ್ಲಿ, ವೃದ್ಧರು, ಅಂಗವಿಕಲರಿಗೆ ದೇವಸ್ಥಾನಕ್ಕೆ ತೆರಳಲು ತೀವ್ರ ತೊಂದರೆಯಾಗುವ ಕಾರಣಕ್ಕೆ, ವಾಹನಗಳ ಪಾರ್ಕಿಂಗ್ ವ್ಯವಸ್ಥೆ ಮಾಡಲು, ಸೂಕ್ತ ಸ್ಥಳ ಗುರುತಿಸಿ ಸಿದ್ಧತೆಗಳನ್ನು ಕೈಗೊಳ್ಳಬೇಕು. ಜಾತ್ರೆಗೆ ಲಕ್ಷಾಂತರ ಭಕ್ತರು ಆಗಮಿಸಲಿದ್ದು ನೈರ್ಮಲ್ಯತೆ ಕಾಪಾಡುವ ದೃಷ್ಠಿಯಿಂದ, ಈ ಬಾರಿ ಜಾತ್ರೆಯಲ್ಲಿ ಸ್ವಚ್ಛತೆ ಹೆಚ್ಚಿನ ಆದ್ಯತೆ ನೀಡಬೇಕು. ಗಂಗಾವತಿ, ಕುಷ್ಟಗಿ, ಯಲಬುರ್ಗಾ, ಕೊಪ್ಪಳ ಮತ್ತು ಹೊಸಪೇಟೆಯಿಂದ ವಿಶೇಷ ಬಸ್ ವ್ಯವಸ್ಥೆ ಮಾಡಬೇಕು. ಜಾತ್ರೆ ಸಂದರ್ಭದಲ್ಲಿ ಪ್ರಾಣಿಬಲಿ ಕೊಡುವುದನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದ್ದು, ಕಾನೂನು ಉಲ್ಲಂಘಿಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವ ಬಗ್ಗೆ ಎಚ್ಚರಿಕೆ ಫಲಕಗಳನ್ನು ಅಳವಡಿಸಬೇಕು. ಜಾತ್ರಾ ಸಂದರ್ಭದಲ್ಲಿ ಸುಮಾರು ಒಂದು ತಿಂಗಳುಗಳ ಕಾಲ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತಾದಿಗಳು ಕ್ಷೇತ್ರಕ್ಕೆ ಬರುವುದರಿಂದ, ಮುಂಜಾಗ್ರತಾ ಕ್ರಮವಾಗಿ ಹುಲಿಗಿಯಲ್ಲಿ ಹೆಚ್ಚುವರಿ ವೈದ್ಯರು ಮತ್ತು ಸಿಬ್ಬಂದಿಗಳನ್ನು ನಿಯೋಜಿಸಬೇಕು. ಅಲ್ಲದೆ ಅಗತ್ಯ ಔಷಧಿಯನ್ನು ದಾಸ್ತಾನು ಇರಿಸಬೇಕು. ಸಾಧ್ಯವಾದಲ್ಲಿ, ದೇವಸ್ಥಾನದ ಬಳಿ ತಾತ್ಕಾಲಿಕ ಚಿಕಿತ್ಸಾ ಕೇಂದ್ರ ಪ್ರಾರಂಭಿಸಬೇಕು. ಜಿಲ್ಲಾಧಿಕಾರಿ ಎಂ. ಕನಗವಲ್ಲಿ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಹುಲಿಗೆಮ್ಮ ದೇವಸ್ಥಾನದ ಕಾರ್ಯನಿರ್ವಹಣಾಧಿಕಾರಿ ಸಿ.ಎಸ್.ಚಂದ್ರಮೌಳಿ ಅವರು ಮಾತನಾಡಿ, ಜಾತ್ರೆಯ ಸಂದರ್ಭದಲ್ಲಿ ನಿರಂತರ ವಿದ್ಯುತ್ ಸರಬರಾಜಿಗೆ ಅಗತ್ಯ ವ್ಯವಸ್ಥೆ ಕೈಗೊಳ್ಳಬೇಕು. ಮುಂಜಾಗ್ರತಾ ಕ್ರಮವಾಗಿ ಹೆಚ್ಚುವರಿ ಪರಿವರ್ತಕಗಳನ್ನು ಕಾಯ್ದಿರಿಸಬೇಕು. ಜಾತ್ರೆ ಸಂದರ್ಭದಲ್ಲಿ ಕುಡಿಯುವ ನೀರಿಗಾಗಿ ಜಲಾಶಯದಿಂದ ನದಿಗೆ ನೀರು ಹರಿಸುವುದು ಅಗತ್ಯವಾಗಿದೆ ಅಲ್ಲದೆ ಟ್ಯಾಂಕರ್ ಮೂಲಕ ನೀರು ಪೂರೈಕೆ ಮಾಡಬೇಕಾಗಿದೆ ಎಂದು ಮನವಿ ಮಾಡಿದರು. ದೇವಾಲಯ ಆವರಣದಲ್ಲಿ ಭಕ್ತಾದಿಗಳಿಗೆ ತಾತ್ಕಾಲಿಕವಾಗಿ ನೆರಳಿನ ವ್ಯವಸ್ಥೆ ಮಾಡಲಾಗುವುದು. ರಥೋತ್ಸವಕ್ಕಾಗಿ ರಥದ ಸಾಮರ್ಥ್ಯ ಕುರಿತು ಲೋಕೋಪಯೋಗಿ ಇಲಾಖೆಯಿಂದ ಪ್ರಮಾಣ ಪತ್ರ ಪಡೆಯಲಾಗುವುದು. ರಥೋತ್ಸವದ ದಿನದಂದು ರಥಕ್ಕೆ ಹೂವಿನ ಹಾರ ತರುವವರು ಮಧ್ಯಾಹ್ನ ೩-೩೦ ರ ಒಳಗಾಗಿ ತರಬೇಕು. ತಡವಾಗಿ ತಂದಲ್ಲಿ ಅವಕಾಶ ನೀಡಲಾಗುವುದಿಲ್ಲ ಎಂದರು.
ಸಭೆಯಲ್ಲಿ ಭಾಗವಹಿಸಿದ್ದ ಜಿ.ಪಂ. ಮಾಜಿ ಅಧ್ಯಕ್ಷ ಜನಾರ್ಧನ ಹುಲಿಗಿ ಅವರು ಮಾತನಾಡಿ, ಹುಲಿಗಿ ಕ್ಷೇತ್ರಕ್ಕೆ ಭೇಟಿ ನೀಡುವ ಭಕ್ತಾದಿಗಳ ಸಂಖ್ಯೆ ಹೆಚ್ಚುತ್ತಿದ್ದು, ವಾಹನಗಳ ಪಾರ್ಕಿಂಗ್ ಹಾಗೂ ಸುಗಮ ಸಂಚಾರಕ್ಕೆ ಸೂಕ್ತ ವ್ಯವಸ್ಥೆ ಇಲ್ಲ. ಈ ಕುರಿತಂತೆ ಶಾಶ್ವತ ಪರಿಹಾರ ಕಂಡುಕೊಳ್ಳಲು ಜಿಲ್ಲಾಡಳಿತ ಸೂಕ್ತ ವ್ಯವಸ್ಥೆ ಕೈಗೊಳ್ಳಬೇಕು. ದೇವಸ್ಥಾನದ ಹೆಸರಿನಲ್ಲಿರುವ ಸುಮಾರು ೩೦ ಎಕರೆ ಜಮೀನು ಬಳಕೆಯಾಗದೆ ವ್ಯರ್ಥವಾಗಿದ್ದು, ದೇವಸ್ಥಾನದ ಅಭಿವೃದ್ಧಿಯ ದೃಷ್ಟಿಯಿಂದ ಇದನ್ನು ಸದ್ಬಳಕೆ ಮಾಡಿಕೊಳ್ಳುವ ನಿಟ್ಟಿನಲ್ಲಿಯೂ ಸೂಕ್ತ ನಿರ್ಧಾರ ಕೈಗೊಳ್ಳಬೇಕು ಎಂದು ಮನವಿ ಮಾಡಿದರು.
ಡಿವೈಎಸ್‌ಪಿ ಶ್ರೀಕಾಂತ್ ಕಟ್ಟಿಮನಿ, ಪಿಐ ಭೀಮಣ್ಣ ಕೋರಿ ಅವರು, ಜಾತ್ರಾ ಸಂದರ್ಭದಲ್ಲಿ ಅಗತ್ಯ ಪೊಲೀಸ್ ಬಂದೋಬಸ್ತ್ ಮಾಡಲಾಗುವುದು. ಅಲ್ಲದೆ ಜೇಬುಗಳ್ಳರು, ಸರಗಳ್ಳರಂತಹ ಅಪರಾಧಿಗಳನ್ನು ತಡೆಗಟ್ಟಲು ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗುವುದು. ಜಾತ್ರಾ ಹೊರಗಿನ ಆವರಣ, ಹೊಳೆದಂಡೆ, ಹಾಗೂ ಹೆಚ್ಚಿನ ಜನಸಂದಣಿ ಆಗುವ ಕಡೆಗಳಲ್ಲಿ ಸಿ.ಸಿ. ಕ್ಯಾಮೆರಾ ಅಳವಡಿಸಲಾಗುವುದು ಎಂದರು.
ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಡಾ. ರುದ್ರೇಶ್ ಘಾಳಿ, ಉಪವಿಭಾಗಾಧಿಕಾರಿ ಗುರುದತ್ ಹೆಗ್ಡೆ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ರಾಮಕೃಷ್ಣ, ಹುಲಿಗಿ ಗ್ರಾ.ಪಂ. ಅಧ್ಯಕ್ಷರು, ತಾ.ಪಂ. ಸದಸ್ಯರು ಸೇರಿದಂತೆ ಜಿಲ್ಲಾ ಮಟ್ಟದ ವಿವಿಧ ಇಲಾಖೆ ಅಧಿಕಾರಿಗಳು ಭಾಗವಹಿಸಿದ್ದರು.

Leave a Reply