ವಿಧಾನಸಭೆ ಸಾರ್ವತ್ರಿಕ ಚುನಾವಣೆ : ನಿಷೇಧಾಜ್ಞೆ ಜಾರಿ

ಕರ್ನಾಟಕ ವಿಧಾನಸಭೆ ಸಾರ್ವತ್ರಿಕ ಚುನಾವಣೆ ನಿಮಿತ್ಯ ಮುಕ್ತ, ಶಾಂತ ಹಾಗೂ ನ್ಯಾಯ ಸಮ್ಮತ ಚುನಾವಣೆ ನಡೆಸಲು ಮತದಾನದ ಪೂರ್ವ ದಿನ ಹಾಗೂ ಮತದಾನ ದಿನದಂದು ಕೊಪ್ಪಳ ಜಿಲ್ಲೆಯಾದ್ಯಂತ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾ ಚುನಾವಣಾಧಿಕಾರಿಯಾಗಿರುವ ಜಿಲ್ಲಾಧಿಕಾರಿ ಎಂ. ಕನಗವಲ್ಲಿ ಅವರು ಆದೇಶ ಹೊರಡಿಸಿದ್ದಾರೆ.
ಕರ್ನಾಟಕ ವಿಧಾನಸಭೆ ಸಾರ್ವತ್ರಿಕ ಚುನಾವಣೆ ನಿಮಿತ್ಯ ಮೇ. 12 ರಂದು ನಡೆಯಲಿರುವ ಮತದಾನದ ಸಂಬಂಧವಾಗಿ ಮುಕ್ತ ಹಾಗೂ ನ್ಯಾಯ ಸಮ್ಮತ ಚುನಾವಣೆಯನ್ನು ಜರುಗಿಸುವ ಸಲುವಾಗಿ ಕ್ರಿಮಿನಲ್ ಪ್ರಕ್ರಿಯೆ ಸಂಹಿತೆ 1973ರ ಕಲಂ 144 ರನ್ವಯ ಮೇ. 10 ರ ಸಾಯಂಕಾಲ 6 ಗಂಟೆಯಿಂದ ಮೇ. 13 ರ ಬೆಳಿಗ್ಗೆ 6 ಗಂಟೆಯವರೆಗೆ ಕೊಪ್ಪಳ ಜಿಲ್ಲೆಯಾದ್ಯಂತ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಇದರನ್ವಯ ಮತದಾನ ನಡೆಯುವ ಎಲ್ಲಾ ಮತ ಕ್ಷೇತ್ರಗಳಲ್ಲಿ ಕಾನೂನು ಬಾಹಿರವಾಗಿ ಗುಂಪುಗೂಡುವುದನ್ನು ಮತ್ತು ಸಾರ್ವಜನಿಕ ಸಭೆಗಳನ್ನು ನಡೆಸುವುದನ್ನು ನಿಷೇಧಿಸಲಾಗಿದೆ. ಮತದಾನ ನಡೆಯುವ ಎಲ್ಲಾ ಮತ ಕ್ಷೇತ್ರಗಳಲ್ಲಿ 5 ಜನರಿಗಿಂತ ಹೆಚ್ಚಿನ ವ್ಯಕ್ತಿಗಳು ಗುಂಪುಗೂಡಲು/ ಒಟ್ಟಾಗಿ ಓಡಾಡುವುದನ್ನು ನಿರ್ಭಂಧಿಸಲಾಗಿದೆ. ನಿಷೇಧಿತ ಅವಧಿಯಲ್ಲಿ ರಾಜಕೀಯ ಪಕ್ಷಗಳು/ ಅಭ್ಯರ್ಥಿಗಳು ಬಾಗಿಲಿನಿಂದ ಬಾಗಿಲಿಗೆ ಹೋಗಿ ಮತಯಾಚಿಸುವ ಸಲುವಾಗಿ ಮನೆಯಿಂದ ಮನೆಗೆ ಹೋಗುವುದನ್ನು ನಿರ್ಭಂಧಿಸಿರುವುದಿಲ್ಲ. ಆದರೆ 10 ಜನರಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಜನರು ಗುಂಪು ಕೂಡಿಕೊಂಡು ಮನೆಯಿಂದ ಮನೆಗೆ ಹೋಗಿ ಮತಯಾಚಿಸುವುದನ್ನು ನಿರ್ಭಂಧಿಸಲಾಗಿದೆ. ಈ ಆದೇಶವು ಮದುವೆ, ಶವ ಸಂಸ್ಕಾರಗಳು ಹಾಗೂ ಇನ್ನಿತರ ಧಾರ್ಮಿಕ ಕಾರ್ಯಕ್ರಮಗಳಿಗೆ ಅನ್ವಯಿಸುವುದಿಲ್ಲ ಎಂದು ಜಿಲ್ಲಾಧಿಕಾರಿಗಳು ಆದೇಶದಲ್ಲಿ ತಿಳಿಸಿದ್ದಾರೆ.

Please follow and like us:
error