ಸಮಿತಿಗಳು ಅಚ್ಚುಕಟ್ಟಾಗಿ ಜವಾಬ್ದಾರಿ ನಿರ್ವಹಿಸಿ : ಪಿ. ಸುನೀಲ್ ಕುಮಾರ್

ಕೊಪ್ಪಳ ಮಾ. ಉದ್ಯೋಗ ಮೇಳದ ಯಶಸ್ವಿ ನಿರ್ವಹಣೆಗೆ ರಚಿಸಲಾಗಿರುವ ಸಮಿತಿಗಳು ತಮಗೆ ನೀಡಿದ ಜವಾಬ್ದಾರಿಯನ್ನು ವ್ಯವಸ್ಥಿತವಾಗಿ ನಿರ್ವಹಿಸಿ, ಉದ್ಯೋಗ ಮೇಳದಲ್ಲಿ ಭಾಗವಹಿಸುವ ಅಭ್ಯರ್ಥಿಗಳಿಗೆ ಮತ್ತು ಕಂಪನಿಗಳಿಗೆ ಗೊಂದಲ ಉಂಟಾಗದAತೆ ಕಾರ್ಯ ನಿರ್ವಹಿಸಿ ಎಂದು ಜಿಲ್ಲಾಧಿಕಾರಿ ಪಿ. ಸುನೀಲ್ ಕುಮಾರ್ ಹೇಳಿದರು.
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಇಂದು ಉದ್ಯೋಗ ಮೇಳದ ಅಂಗವಾಗಿ ರಚಿಸಿರುವ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಇದೇ ಮಾರ್ಚ್ 14 ಮತ್ತು 15 ರಂದು ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯಲಿರುವ ಉದ್ಯೋಗ ಮೇಳದ ಯಶಸ್ವಿ ನಿರ್ವಹಣೆಗೆ ವೇದಿಕೆ ಸಮಿತಿ, ನೋಂದಣಿ ಕೌಂಟರ್‌ಗಳ ಮೇಲ್ವಿಚಾರಣೆ ಸಮಿತಿ, ಆಹಾರ ಸಮಿತಿ, ಸಾರಿಗೆ ಸಮಿತಿ, ಆರೋಗ್ಯ ಸಮಿತಿ, ಭದ್ರತಾ ಸಮಿತಿ, ವಿದ್ಯುತ್ ಸರಬರಾಜು ಸಮಿತಿ, ಮಾಧ್ಯಮ ಸಮಿತಿ, ವಾಹನ ನಿಲುಗಡೆ, ಕುಡಿಯುವ ನೀರು, ಸ್ವಚ್ಛತೆ ಹಾಗೂ ಆಹಾರ ಕೌಂಟರ್ ಸಮಿತಿ, ಆಮಂತ್ರಣ ಪತ್ರಿಕೆ ಸಮಿತಿ ಹಾಗೂ ಸಂಘಟಣಾ ಮತ್ತು ಮೇಲುಸ್ತುವಾರಿ ಸಮಿತಿಗಳನ್ನು ರಚಿಸಲಾಗಿದೆ. ಉತ್ತಮ ವೇದಿಕೆ ನಿರ್ಮಾಣ, ನೋಂದಣಿ ಕೌಂಟರ್‌ಗಳಲ್ಲಿ ಉದ್ಯೋಗಾಕಾಂಕ್ಷಿಗಳಿಗೆ ತೆರೆದಿರುವ ಕೌಂಟರ್‌ಗಳಲ್ಲಿ ಯಾವುದೇ ಗದ್ದಲ, ಗಲಾಟೆ ಆಗದಂತೆ ಅಚ್ಚುಕಟ್ಟಾಗಿ ವ್ಯವಸ್ಥೆಯನ್ನು ಕಲ್ಪಿಸಬೇಕು. ಸಾರಿಗೆ ಸಮಿತಿಯವರು ಜಿಲ್ಲಾ ಬಸ್ ನಿಲ್ದಾಣ ಹಾಗೂ ರೈಲ್ವೇ ನಿಲ್ದಾಣದಿಂದ ವಿಶೇಷ ಸಾರಿಗೆ ವ್ಯವಸ್ಥೆಯನ್ನು ಕಲ್ಪಿಸಲಾಗಿದ್ದು, ಉದ್ಯೋಗಾಕಾಂಕ್ಷಿಗಳಿಗೆ ಅನುಕೂಲವಾಗುವಂತೆ ವ್ಯವಸ್ಥೆ ಮಾಡಬೇಕು. ಆರೋಗ್ಯ ಸಮಿತಿಯವರು ಜಿಲ್ಲಾ ಕ್ರೀಡಾಂಗಣದ ವ್ಯಾಪ್ತಿಯಲ್ಲಿ ತುರ್ತು ಆಂಬ್ಯುಲೆನ್ಸ್ ವ್ಯವಸ್ಥೆ ಕಲ್ಪಿಸಬೇಕು. ಹಾಗೂ ಕ್ರೀಡಾಂಗಣದಲ್ಲಿ ಪ್ರಥಮ ಚಿಕಿತ್ಸೆ ಕೇಂದ್ರವನ್ನು ತೆರೆಯುವುದರ ಜೊತೆಗೆ ನುರಿತ ವೈದ್ಯರು ಹಾಗೂ ಶುಶ್ರೂಷಕಿಯರನ್ನು ನಿಯೋಜಿಸಬೇಕು. ವಾಹನ ನಿಲುಗಡೆ, ಕುಡಿಯುವ ನೀರು, ಸ್ವಚ್ಛತೆ ಹಾಗೂ ಆಹಾರ ಕೌಂಟರ್ ಸಮಿತಿಯವರು ಕ್ರೀಡಾಂಗಣದ ಹೊರಭಾಗದಲ್ಲಿ ಉದ್ಯೋಗಾಕಾಂಕ್ಷಿಗಳಿಗೆ ಸಂಚಾರಿ ಕ್ಯಾಂಟಿನ್ ಮೂಲಕ ಕಡಿಮೆ ದರದಲ್ಲಿ ಗುಣಮಟ್ಟದ ಆಹಾರ ವ್ಯವಸ್ಥೆ ಕಲ್ಪಿಸಲು ಕೌಂಟರ್ ತೆರೆಯಬೇಕು. ಸಂಘಟಣಾ ಮತ್ತು ಮೇಲುಸ್ತುವಾರಿ ಸಮಿತಿಯು ಉದ್ಯೋಗ ಮೇಳದಲ್ಲಿ ಕೈಗೊಂಡ ಕ್ರಮಗಳ ಬಗ್ಗೆ ಪರಿಶೀಲಿಸಬೇಕು ಹಾಗೂ ಉದ್ಯೋಗ ಮೇಳದ ಸಂಪೂರ್ಣ ಮೇಲುಸ್ತುವಾರಿಯನ್ನು ನಿರ್ವಹಿಸಬೇಕು ಎಂದು ಅವರು ಸಮಿತಿಗಳ ಕರ್ತವ್ಯ ಹಾಗೂ ಜವಾಬ್ದಾರಿಯನ್ನು ತಿಳಿಸಿದರು.
ಕೊಪ್ಪಳ ಜಿಲ್ಲಾ ಜಾಲತಾಣ  www.koppal.nic.in  ನಲ್ಲಿ ಉದ್ಯೋಗಾಕಾಂಕ್ಷಿಗಳು ನೋಂದಣಿ ಮಾಡಿಕೊಳ್ಳಬೇಕು. ಇದುವರೆಗೂ 600 ಅಭ್ಯರ್ಥಿಗಳು ನೋಂದಣಿ ಮಾಡಿಕೊಂಡಿದ್ದಾರೆ. ಹೆಚ್ಚಿನ ಪ್ರಚಾರಕ್ಕಾಗಿ ಉದ್ಯೋಗ ಮೇಳದ ಪೋಸ್ಟರ್‌ಗಳನ್ನು, ಕರಪತ್ರಗಳನ್ನು ವಿತರಿಸಲಾಗಿದೆ. ಪಿಡಿಒಗಳು ಹಾಗೂ ಗ್ರಾಮ ಲೆಕ್ಕಾಧಿಕಾರಿಗಳಿಗೆ ತಮ್ಮ ವ್ಯಾಪ್ತಿಯ ಉದ್ಯೋಗಾಕಾಂಕ್ಷಿಗಳನ್ನು ನೋಂದಣಿ ಮಾಡಿಸುವಂತೆ ಸೂಚಿಸಲಾಗಿದೆ. ಪದವಿ ಕಾಲೇಜುಗಳಲ್ಲಿ ಪದವಿ ಪಡೆದ ವಿದ್ಯಾರ್ಥಿಗಳಿಗೆ ಉದ್ಯೋಗ ಮೇಳದ ಮಾಹಿತಿ ನೀಡಿ ಅವರಿಂದಲೂ ನೋಂದಣಿ ಮಾಡಿಸಿ, ಉದ್ಯೋಗ ಮೇಳದಲ್ಲಿ ಭಾಗವಹಿಸಲು ತಿಳಿಸುವಂತೆ ಪದವಿ ಕಾಲೇಜುಗಳ ಪ್ರಾಂಶುಪಾಲರಿಗೆ ಸೂಚನೆ ನೀಡಲಾಗಿದೆ. ಉದ್ಯೋಗ ಮೇಳದಲ್ಲಿ 150 ಕ್ಕೂ ಹೆಚ್ಚು ಕಂಪನಿಗಳು ಭಾಗವಹಿಸಲಿದ್ದು, 100 ಕ್ಕೂ ಹೆಚ್ಚು ಮಳಿಗೆಗಳನ್ನು ತೆರೆಯಲಾಗುತ್ತದೆ. ಉದ್ಯೋಗಾಕಾಂಕ್ಷಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಅವರು ಹೇಳಿದರು.
ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಎಂ.ಪಿ. ಮಾರುತಿ, ಜಿ.ಪಂ. ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಘುನಂದನ್ ಮೂರ್ತಿ, ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಸಿದ್ದರಾಮೇಶ್ವರ, ಜಿಲ್ಲಾ ಕೌಶಲ್ಯಾಭಿವೃದ್ದಿ ಅಧಿಕಾರಿ ಗವಿಶಂಕರ್ ಕೆ., ಜಿಲ್ಲಾ ಉದ್ಯೋಗಾಧಿಕಾರಿ ಪಿ.ಎಸ್. ಹಟ್ಟಪ್ಪ, ಜಿಲ್ಲಾ ಮಾಹಿತಿ ಅಧಿಕಾರಿ ಬಸವರಾಜ, ಪೌರಾಯುಕ್ತರಾದ ಮಂಜುನಾಥ ಟಿ.ಎ, ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಉಪ ನಿರ್ದೇಶಕರಾದ ಎನ್.ಜಿ. ಕನಕರೆಡ್ಡಿ, ನಿರ್ಮಿತಿ ಕೇಂದ್ರದ ಯೋಜನಾ ನಿರ್ದೇಶಕರಾದ ಶಶಿಧರ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

Please follow and like us:
error