fbpx

ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಮೇ 13ರಂದು ಪ್ರಮಾಣ ವಚನ ಸ್ವೀಕಾರ

ಬೆಂಗಳೂರು, ಮೇ 10: ಕರ್ನಾಟಕ ರಾಜ್ಯದ 28ನೆ ಮುಖ್ಯಮಂತ್ರಿಯಾಗಿ ಸಿದ್ಧರಾಮಯ್ಯನವರು ಪ್ರಮಾಣ ವಚನ ಸ್ವೀಕಾರಕ್ಕೆ ಕ್ಷಣಗಣನೆ ಆರಂಭವಾಗಿದ್ದು, ಸೋಮವಾರ ನಗರದ ಕಂಠೀರವ ಒಳಾಂಗಣ ಕ್ರೀಡಾಂಗಣದಲ್ಲಿ ಪ್ರಮಾಣ ವಚನ ಸಮಾರಂಭಕ್ಕೆ ಸಿದ್ದತೆ ನಡೆದಿದೆ.
ಶಾಸಕಾಂಗ ಪಕ್ಷದ ನಾಯಕನಾಗಿ ಸಿದ್ದರಾಮಯ್ಯನವರ ಹೆಸರನ್ನು ಕಾಂಗ್ರೆಸ್ ಹೈಕಮಾಂಡ್ ಅಧಿಕೃತವಾಗಿ ಪ್ರಕಟಿಸಿದ್ದು, ಸೋಮವಾರ ರಾಜ್ಯದಲ್ಲಿ ಕಾಂಗ್ರೆಸ್ ನೇತೃತ್ವದ ನೂತನ ಸರಕಾರ ಅಸ್ತಿತ್ವಕ್ಕೆ ಬರುವುದು ಖಚಿತವಾಗಿದೆ. ಕೇಂದ್ರ ಸಚಿವ ಎ.ಕೆ.ಆ್ಯಂಟನಿ ನೇತೃತ್ವದ ವೀಕ್ಷಕರ ಸಮ್ಮುಖದಲ್ಲಿ ನಡೆದ ಶಾಸಕಾಂಗ ಸಭೆಯಲ್ಲಿ ಸಿದ್ದರಾಮಯ್ಯ ಅವರನ್ನು ಶಾಸಕಾಂಗ ಪಕ್ಷದ ನೂತನ ನಾಯಕನನ್ನಾಗಿ ಆಯ್ಕೆ ಮಾಡಲಾಗಿದೆ.
ಶುಕ್ರವಾರ ಕೆಪಿಸಿಸಿ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಎಲ್ಲ 121 ಮಂದಿ ಶಾಸಕರ ಗುಪ್ತ ಮತದಾನದ ಮೂಲಕ ಶಾಸಕಾಂಗ ಪಕ್ಷದ ನಾಯಕ ಯಾರಾಗಬೇಕೆಂಬ ಬಗ್ಗೆ ಅಭಿಪ್ರಾಯಗಳನ್ನು ಸಂಗ್ರಹಿಸಲಾಯಿತು. 80ಕ್ಕೂ ಹೆಚ್ಚು ಮಂದಿ ಶಾಸಕರು ಸಿದರಾಮಯ್ಯ ಪರ ಒಲವು ವ್ಯಕ್ತಪಡಿಸಿದ್ದಾರೆ.
ಆ ಹಿನ್ನೆಲೆಯಲ್ಲಿ ಶಾಸಕರ ಸಂಖ್ಯಾಬಲದ ವಿವರಗಳನ್ನು ದೂರವಾಣಿ ಮೂಲಕವೇ ಎಐಸಿಸಿ ಅಧ್ಯಕ್ಷೆ ಸೋನಿಯ ಅವರಿಗೆ ರವಾನಿಸಲಾಯಿತು. ಶಾಸಕರ ಅಭಿಪ್ರಾಯದಂತೆ ಸಿದ್ದರಾಮಯ್ಯ ಅವರನ್ನೇ ಆಯ್ಕೆ ಮಾಡುವಂತೆ ಸೋನಿಯಾ ಒಪ್ಪಿಗೆ ಸೂಚಿಸಿದ ಹಿನ್ನೆಲೆಯಲ್ಲಿ ಅವರನ್ನು ಶಾಸಕಾಂಗ ಪಕ್ಷದ ನಾಯಕನನ್ನಾಗಿ ಆಯ್ಕೆ ಮಾಡಲಾಗಿದೆ.
ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ, ಮಲ್ಲಿಕಾರ್ಜುನ ಖರ್ಗೆ, ವೀರಪ್ಪ ಮೊಯ್ಲಿ, ಡಿ.ಕೆ.ಶಿವಕುಮಾರ್, ಆರ್.ವಿ.ದೇಶಪಾಂಡೆ, ಟಿ.ಬಿ.ಜಯಚಂದ್ರ ಸೇರಿದಂತೆ ಹಲವರು ರೇಸ್‌ನಲ್ಲಿದ್ದರು. ಆ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪಕ್ಷದ ಕೇಂದ್ರ ವೀಕ್ಷಕರಾಗಿ ಎ.ಕೆ.ಆಂಟನಿ, ಲೋಸಿನೋ ಫೆಲೋರೋ, ರಾಜ್ಯ ಉಸ್ತುವಾರಿ ಮಧುಸೂದನ್ ಮಿಸ್ತ್ರಿ ಮಧ್ಯಾಹ್ನ 12ಗಂಟೆಯ ಸುಮಾರಿಗೆ ಬೆಂಗಳೂರಿನ ಕೆಪಿಸಿಸಿ ಕಚೇರಿಗೆ ಆಗಮಿಸಿದರು.
ಬಳಿಕ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರಲು ಒಗ್ಗಟ್ಟಿನಿಂದ ಶ್ರಮಿಸಿದ ಪಕ್ಷದ ಮುಖಂಡರು, ಕಾರ್ಯಕರ್ತರು ಹಾಗೂ ಎಲ್ಲ ನೂತನ ಶಾಸಕರಿಗೂ ಎ.ಕೆ. ಆಂಟನಿ ಅಭಿನಂದನೆ ಸಲ್ಲಿಸಿದರು. ಅನಂತರ ಶಾಸಕರ ಅಭಿಪ್ರಾಯ ಸಂಗ್ರಹಕ್ಕೆ ಗುಪ್ತ ಮತದಾನ ನಡೆಸಲಾಯಿತು.
ಈ ಸಂದರ್ಭದಲ್ಲಿ ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್, ಸಿದ್ದರಾಮಯ್ಯ, ಕೇಂದ್ರ ಸಚಿವರಾದ ಮಲ್ಲಿಕಾರ್ಜುನ ಖರ್ಗೆ, ವೀರಪ್ಪ ಮೊಯ್ಲಿ ಸೇರಿದಂತೆ ನೂತನವಾಗಿ ಆಯ್ಕೆಯಾಗಿರುವ ಎಲ್ಲ ಶಾಸಕರು ಹಾಗೂ ಪಕ್ಷದ ಹಿರಿಯ ಮುಖಂಡರು ಉಪಸ್ಥಿತರಿದ್ದರು.
ಸಿಎಂ ಸ್ಥಾನಕ್ಕೆ ತೀವ್ರ ಪೈಪೋಟಿ ನಡೆಸಿದ್ದ ಮಲ್ಲಿಕಾರ್ಜುನ ಖರ್ಗೆ, ಕೊನೆಯ ಕ್ಷಣದಲ್ಲಿ ಬಹುತೇಕ ಶಾಸಕರ ಅಭಿಪ್ರಾಯ ತಮ್ಮ ಪರವಾಗಿ ಇಲ್ಲದ ಹಿನ್ನೆಲೆಯಲ್ಲಿ ಮಲ್ಲಿಕಾರ್ಜುನ ಖರ್ಗೆ ಕೂಡ ಸಿದ್ದರಾಮಯ್ಯ ಆಯ್ಕೆಗೆ ಬೆಂಬಲ ಸೂಚಿಸಿದರು.
ಕಾಂಗ್ರೆಸ್ ಪಕ್ಷದ ಎಲ್ಲ ಶಾಸಕರು ಹಾಗೂ ಮುಖಂಡರು ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯನವರ ಹೆಸರನ್ನೆ ಸೂಚಿಸಿದರು. ಆ ಹಿನ್ನೆಲೆಯಲ್ಲಿ ಸಿಎಂ ಸ್ಥಾನಕ್ಕೆ ಅವರ ಹೆಸರನ್ನೆ ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು. ಅನಂತರ ಕೇಂದ್ರ ಸಚಿವ ಎ.ಕೆ.ಆಂಟನಿ ಶಾಸಕಾಂಗ ಪಕ್ಷದ ನಾಯಕನಾಗಿ ಸಿದ್ದರಾಮಯ್ಯನವರ ಹೆಸರನ್ನೆ ಅಧಿಕೃತವಾಗಿ ಘೋಷಣೆ ಮಾಡಲಾಯಿತು.
Please follow and like us:
error

Leave a Reply

error: Content is protected !!