1336 ನಿರುದ್ಯೋಗಿಗಳಿಗೆ ಕೆಲಸ ನೀಡಿದ ಕೊಪ್ಪಳ ಉದ್ಯೋಗ ಮೇಳ : ಪಿ. ಸುನೀಲ್ ಕುಮಾರ್

ಕೊಪ್ಪಳ ಫೆ. ): ಕೊಪ್ಪಳ ಜಿಲ್ಲಾ ಮಟ್ಟದ ಉದ್ಯೋಗ ಮೇಳವು 1336 ನಿರುದ್ಯೋಗಿಗಳಿಗೆ ಉದ್ಯೋಗವನ್ನು ನೀಡಿದೆ ಎಂದು ಜಿಲ್ಲಾಧಿಕಾರಿ ಪಿ. ಸುನೀಲ್ ಕುಮಾರ್ ಅವರು ಹೇಳಿದರು.
ಕರ್ನಾಟಕ ಸರ್ಕಾರದ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಕೊಪ್ಪಳ ಜಿಲ್ಲಾಡಳಿತ, ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ ಇವರ ಸಹಯೋಗದಲ್ಲಿ ಕೊಪ್ಪಳ ಜಿಲ್ಲಾ ಕ್ರೀಡಾಂಗಣದಲ್ಲಿ ಗುರುವಾರದಂದು ಆಯೋಜಿಸಲಾಗಿದ ಜಿಲ್ಲಾ ಮಟ್ಟದ ಉದ್ಯೋಗ ಮೇಳದ ಸಮಾರೋಪ ಸಮಾರಂಭದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ರಾಜ್ಯ ಸರ್ಕಾರವು ಪ್ರತಿ ಜಿಲ್ಲೆಯಲ್ಲಿ ಉದ್ಯೋಗ ಮೇಳವನ್ನು ಆಯೋಜಿಸುವಂತೆ ನಿರ್ದೇಶನವನ್ನು ನೀಡಿದ್ದು, ಈ ನಿಟ್ಟಿನಲ್ಲಿ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಸಚಿವರು ಹಾಗೂ ಇಲಾಖೆಯ ಸರ್ಕಾರದ ಕಾರ್ಯದರ್ಶಿಗಳು ಉದ್ಯೋಗ ಮೇಳ ಏರ್ಪಡಿಸಲು ಉತ್ತಮವಾದ ಯೋಜನೆಯನ್ನು ರೂಪಿಸಿದ್ದಾರೆ. ಉದ್ಯೋಗಾಕಾಂಕ್ಷಿಗಳಿಗೆ ಅವರು ಹೊಂದಿರುವ ವಿದ್ಯಾರ್ಹತೆಗೆ ಅನುಗುಣವಾಗಿ ಉದ್ಯೋಗವಕಾಶವನ್ನು ನೀಡಲು ಉದ್ಯೋಗಾಕಾಂಕ್ಷಿಗಳು ಮತ್ತು ನಿಯೋಜಕರನ್ನು ಒಂದೇ ವೇದಿಕೆಯಲ್ಲಿ ತರಲು ಇಂತಹ ಮೇಳಗಳು ತುಂಬಾ ಸಹಕಾರಿಯಾಗಿವೆ. ಈ ದಿಶೆಯಲ್ಲಿ ಕೊಪ್ಪಳ ಜಿಲ್ಲಾ ಮಟ್ಟದ ಉದ್ಯೋಗ ಮೇಳವನ್ನು ಏರ್ಪಡಿಸಲಾಗಿದ್ದು, ಈ ಮೇಳದಲ್ಲಿ ಸುಮಾರು 40 ಕಂಪನಿಗಳು ಹಾಗೂ ಕನಿಷ್ಟ 2600 ಉದ್ಯೋಗಾಕಾಂಕ್ಷಿಗಳು ಭಾಗವಹಿಸಬೇಕು ಎಂಬುವುದು ಕಾರ್ಯಕ್ರಮದ ಗುರಿಯಾಗಿತ್ತು. ಆದರೆ ನಿರೀಕ್ಷೆಗೂ ಮೀರಿ ಅಂದರೆ 92 ಕಂಪನಿಗಳು ಭಾಗವಹಿಸಿದ್ದು, ಅಲ್ಲದೇ 4945 ಅಭ್ಯರ್ಥಿಗಳು ನೋಂದಾಯಿಸಿಕೊಂಡು ಈ ಉದ್ಯೋಗ ಮೇಳದಲ್ಲಿ ಭಾಗವಹಿಸಿದ್ದು ವಿಶೇಷ. ಈ ಪೈಕಿ ಸದ್ಯ 1336 ನಿರುದ್ಯೋಗಿಗಳಿಗೆ ಉದ್ಯೋಗ ಸಿಕ್ಕಿದೆ. ಇನ್ನೂ 533 ಅಭ್ಯರ್ಥಿಗಳನ್ನು ಶಾರ್ಟ್‍ಲಿಸ್ಟ್‍ನಲ್ಲಿ ಖಾಯ್ದಿರಿಸಲಾಗಿದೆ. ಆಯ್ಕೆಯಾದವರಲ್ಲಿ ಶೇ.80 ರಿಂದ 90 ರಷ್ಟು ಕೊಪ್ಪಳ ಜಿಲ್ಲೆಯವರೇ ಎಂದು ಹೇಳಲಾಗುತ್ತಿದೆ. ಈ ಕಾರ್ಯವು ನಿಜಕ್ಕೂ ಸಂತೋಷದ ವಿಷಯವಾಗಿದೆ. ಉದ್ಯೋಗ ಮೇಳ ಆಯೋಜಿಸುವ ಕುರಿತು ವಿವಿಧ ಇಲಾಖೆಗಳ ಜಂಟಿಯಾಗಿ ಅನೇಕ ತಂಡಗಳನ್ನು ರಚಿಸಲಾಗಿದ್ದು, ಎಲ್ಲಾ ತಂಡಗಳು ಉತ್ತಮವಾಗಿ ಕಾರ್ಯನಿರ್ವಹಿಸಿದ್ದು, ಜಿಲ್ಲಾ ಮಟ್ಟದ ಉದ್ಯೋಗ ಮೇಳವು ಯಶಸ್ವಿಯಾಗಿದೆ ಎಂದು ಜಿಲ್ಲಾಧಿಕಾರಿ ಪಿ. ಸುನೀಲ್ ಕುಮಾರ್ ಅವರು ಸಂತಸ ವ್ಯಕ್ತಪಡಿಸಿದರು.
ಕಾರ್ಯಕ್ರಮದಲ್ಲಿ ತಹಶೀಲ್ದಾರ ಜೆ.ಬಿ. ಮಜ್ಗಿ, ಜಿಲ್ಲಾ ಕೌಶಾಲ್ಯಾಭಿವೃದ್ಧಿ ಅಧಿಕಾರಿ ಭೀಮನಗೌಡ ಹೊಸಮನಿ, ಜಿಲ್ಲಾ ಉದ್ಯೋಗ ವಿನಿಮಯ ಅಧಿಕಾರಿ ಪಿ.ಎಸ್. ಹಟ್ಟಪ್ಪ, ಕಾರ್ಯಕ್ರಮದ ವ್ಯವಸ್ಥಪಕ ತೇಜಸ್ವಿ ಸೇರಿದಂತೆ ವಿವಿಧ ಕಂಪನಿಗಳ ಮುಖ್ಯಸ್ಥರು, ಅಧಿಕಾರಿಗಳು ಮತ್ತಿತರರು ಉಪಸ್ಥಿತರಿದ್ದರು. ಉದ್ಯೋಗ ಮೇಳದಲ್ಲಿ ಅನೇಕ ಕಂಪನಿಗಳಲ್ಲಿ ಆಯ್ಕೆಯಾದ ಅಭ್ಯರ್ಥಿಗಳಿಗೆ ಆಯ್ಕೆ ಪತ್ರಗಳನ್ನು ಇದೇ ಸಂದರ್ಭದಲ್ಲಿ ವಿತರಿಸಲಾಯಿತು. ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಾಯಕ ನಿರ್ದೇಶಕ ಹಾಗೂ ಜಿಲ್ಲಾ ಸಂಖ್ಯಾ ಸಂಗ್ರಹಣಾಧಿಕಾರಿ ಕೃಷ್ಣಮೂರ್ತಿ ದೇಸಾಯಿ ಅವರು ಕಾರ್ಯಕ್ರಮ ನಿರೂಪಿಸಿ ಕೊನೆಯಲ್ಲಿ ವಂದಿಸಿದರು

Please follow and like us:
error