ಲೋಕಸಭಾ ಚುನಾವಣೆ: ಜ.20ಕ್ಕೆ ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ: ಪ್ರಹ್ಲಾದ್ ಜೋಷಿ

 ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಲಿರುವ ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು 2014ರ ಜನವರಿ 20ರಂದು ಬಿಡುಗಡೆ ಮಾಡಲಾಗುವುದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಪ್ರಹ್ಲಾದ್ ಜೋಷಿ ತಿಳಿಸಿದ್ದಾರೆ.
ಬುಧವಾರ ಹೊಸದಿಲ್ಲಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಲೋಕಸಭಾ ಚುನಾವಣಾ ಸಂದರ್ಭದಲ್ಲಿ ಯಾವುದೇ ಕಾರಣಕ್ಕೂ ಅಪಸ್ವರ, ಗೊಂದಲ ಉಂಟಾಗಬಾರದೆಂಬ ಉದ್ದೇಶದಿಂದ ಮುನ್ನೆಚ್ಚರಿಕೆ ಕ್ರಮವಾಗಿ ಮೊದಲ ಪಟ್ಟಿಯನ್ನು ಪ್ರಕಟಿಸಲಾಗುವುದು ಎಂದರು.
ಬಿಎಸ್‌ವೈ ಸೇರ್ಪಡೆಗೆ ಹಸಿರು ನಿಶಾನೆ: ಮಾಜಿ ಮುಖ್ಯಮಂತ್ರಿ ಹಾಗೂ ಕೆಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಬಿಜೆಪಿ ಸೇರ್ಪಡೆ ಸಂಬಂಧ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ರಾಜನಾಥ್ ಸಿಂಗ್ ಹಸಿರು ನಿಶಾನೆ ತೋರಿಸಿದ್ದಾರೆಂದು ಇದೇ ವೇಳೆ ಪ್ರಹ್ಲಾದ್ ಜೋಷಿ ಸ್ಪಷ್ಟಪಡಿಸಿದರು.
ಬಿ.ಎಸ್.ಯಡಿಯೂರಪ್ಪ ಬಿಜೆಪಿ ಸೇರ್ಪಡೆ ಸಂಬಂಧ ಪಕ್ಷದ ವರಿಷ್ಠರೆ ಆಹ್ವಾನ ನೀಡಲಿದ್ದು, ಈ ಸಂಬಂಧ ರಾಷ್ಟ್ರೀಯ ಮುಖಂಡರೆ ಅಧಿಕೃತವಾಗಿ ಘೋಷಣೆ ಮಾಡಲಿದ್ದಾರೆಂದ ಪ್ರಹ್ಲಾದ್ ಜೋಷಿ, ಬಿಎಸ್‌ವೈ ಅವರನ್ನು ಪಕ್ಷಕ್ಕೆ ಮರಳಿ ಕರೆತರುವ ಸಂಬಂಧ ಶೀಘ್ರದಲ್ಲೆ ತೀರ್ಮಾನ ಕೈಗೊಳ್ಳುವಂತೆ ಮನವಿ ಮಾಡಲಾಗಿದೆ ಎಂದರು.
 ರಾಜ್ಯದ ಎಲ್ಲ ಮುಖಂಡರು ಬಿಎಸ್‌ವೈ ಅವರು ಬಿಜೆಪಿ ಸೇರ್ಪಡೆಗೆ ಒಲವು ವ್ಯಕ್ತಪಡಿಸಿದ್ದು, ಅವರ ಸೇರ್ಪಡೆಗೆ ಯಾರೊಬ್ಬರ ವಿರೋಧವಿಲ್ಲ. ಬಿಎಸ್‌ವೈ ಸೇರ್ಪಡೆಗೊಳ್ಳುವುದರಿಂದ ಬಿಜೆಪಿಯ ಬಲ ಮತ್ತಷ್ಟು ಹೆಚ್ಚಲಿದೆ. ಅಲ್ಲದೆ. ಲೋಕಸಭಾ ಚುನಾವಣೆಯಲ್ಲಿ ಪಕ್ಷ ಹೆಚ್ಚಿನ ಸ್ಥಾನಗಳನ್ನು ಗೆಲ್ಲಲು ಅನುಕೂಲವಾಗಲಿದೆ ಎಂದು ಅವರು ತಿಳಿಸಿದರು.

Leave a Reply