8 ಜಿಲ್ಲೆಗಳಲ್ಲಿ ಸರ್ಕಾರಿ ಕಚೇರಿ ವೇಳೆ ಎಂದಿನಂತೆ

 ಬೆಂಗಳೂರು: ಹೈದರಾಬಾದ್ ಕರ್ನಾಟಕ ಮತ್ತು ಮುಂಬೈ ಕರ್ನಾಟಕದ ಎಂಟು ಜಿಲ್ಲೆಗಳಲ್ಲಿ ಸರ್ಕಾರಿ ಕಚೇರಿಗಳ ಕೆಲಸದ ವೇಳೆಯಲ್ಲಿ ಬದಲಾವಣೆ ಮಾಡಿದ್ದ ಆದೇಶವನ್ನು ಸರ್ಕಾರ ಹಿಂದಕ್ಕೆ ಪಡೆದಿದ್ದು, ಮೊದಲಿನ ಹಾಗೆ ಬೆಳಿಗ್ಗೆ 10ರಿಂದ ಸಂಜೆ 5.30ರವರೆಗೆ ಕಚೇರಿಗಳು ಕಾರ್ಯನಿರ್ವಹಿಸಲಿವೆ.
ಬೇಸಿಗೆ ಹಿನ್ನೆಲೆಯಲ್ಲಿ ಪ್ರತಿ ವರ್ಷದಂತೆ ಈ ವರ್ಷವೂ ಏಪ್ರಿಲ್, ಮೇ ತಿಂಗಳಿಗೆ ಸೀಮಿತವಾಗಿ ಗುಲ್ಬರ್ಗ, ರಾಯಚೂರು, ಕೊಪ್ಪಳ, ಬಳ್ಳಾರಿ, ಯಾದಗಿರಿ, ಬೀದರ್, ಬಾಗಲಕೋಟೆ ಮತ್ತು ವಿಜಾಪುರ ಜಿಲ್ಲೆಗಳಲ್ಲಿ ಸರ್ಕಾರಿ ಕಚೇರಿಗಳ ಕೆಲಸದ ವೇಳೆಯನ್ನು ಬೆಳಿಗ್ಗೆ 8ರಿಂದ ಮಧ್ಯಾಹ್ನ 1.30ಕ್ಕೆ ನಿಗದಿ ಮಾಡಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಕಳೆದ ತಿಂಗಳ 31ರಂದು ಆದೇಶ ಹೊರಡಿಸಿತ್ತು. 
ಆದರೆ ಕಚೇರಿ ವೇಳೆ ಬದಲಾವಣೆ ಮಾಡಿರುವುದರಿಂದ ಬರ ಪರಿಹಾರ ಕಾರ್ಯಗಳಿಗೆ ತೊಂದರೆಯಾಗುತ್ತದೆ. ಮಧ್ಯಾಹ್ನ ಉಷ್ಣಾಂಶ ಜಾಸ್ತಿ ಇರುವುದರಿಂದ ನೌಕರರು ಕೆಲಸ ಮುಗಿಸಿಕೊಂಡು ಊರುಗಳಿಗೆ ಹಿಂತಿರುಗಲು ಕಷ್ಟವಾಗುತ್ತದೆ ಎಂದು ಜಿಲ್ಲಾಧಿಕಾರಿಗಳು ಅಭಿಪ್ರಾಯಪಟ್ಟಿದ್ದರು.
ಈ ಹಿನ್ನೆಲೆಯಲ್ಲಿ ಕಚೇರಿ ವೇಳೆ ಬದಲಾವಣೆ ಮಾಡಿದ್ದ ಆದೇಶವನ್ನು ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಸೋಮವಾರ ಹಿಂದಕ್ಕೆ ಪಡೆದಿದೆ. ರಾಜ್ಯದ ಇತರ ಜಿಲ್ಲೆಗಳಂತೆ ಹೈದರಾಬಾದ್, ಮುಂಬೈ ಕರ್ನಾಟಕ ಭಾಗದ ಜಿಲ್ಲೆಗಳ ಸರ್ಕಾರಿ ಕಚೇರಿಗಳು ಕಾರ್ಯನಿರ್ವಹಿಸಲಿವೆ.
Please follow and like us:
error