ಸಾಮಾಜಿಕ ಶೈಕ್ಷಣಿಕ ಸಮೀಕ್ಷೆ ಡಾ. ಗುರುಲಿಂಗಯ್ಯ ಅವರಿಂದ ಪರಿಶೀಲನೆ.

ಕೊಪ್ಪಳ, : ಕೊಪ್ಪಳ ಜಿಲ್ಲೆಯಲ್ಲಿ ಏ. ೧೧ ರಿಂದ ನಡೆಯುತ್ತಿರುವ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಕುರಿತಂತೆ ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಸದಸ್ಯ ಡಾ. ಗುರುಲಿಂಗಯ್ಯ ಅವರು ಕೊಪ್ಪಳ ಜಿಲ್ಲೆಯ ವಿವಿಧ ಗ್ರಾಮಗಳಿಗೆ ಶುಕ್ರವಾರದಂದು ಭೇಟಿ ನೀಡಿ ಪ್ರಗತಿ ಪರಿಶೀಲನೆ ನಡೆಸಿದರು.ತಾಲೂಕಿನ ಹಲಗೇರಿ, ಯಲಬುರ್ಗಾ ತಾಲೂಕು ಇಟಗಿ ಸೇರಿದಂತೆ ವಿವಿಧ ಗ್ರಾಮಗಳಿಗೆ ಭೇಟಿ ನೀಡಿದ ಅವರು, ಅಲ್ಲಿನ ವಿವಿಧ ಜನವಸತಿ ಪ್ರದೇಶಗಳಲ್ಲಿ ಜರುಗುತ್ತಿದ್ದ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಕುರಿತಂತೆ ಪರಿಶೀಲನೆ ನಡೆಸಿದರು. ಜಿಲ್ಲೆಯಲ್ಲಿ ಸಮೀಕ್ಷೆ ಉತ್ತಮವಾಗಿ ಜರುಗುತ್ತಿದ್ದು, ಸಣ್ಣ ಪುಟ್ಟ ಗೊಂದಲಗಳನ್ನು ಇದೀಗ ನಿವಾರಿಸಲಾಗಿದೆ.  ಕೆಲವು ಮೇಲ್ವಿಚಾರಕರು ಪರೀಕ್ಷೆ ಮೌಲ್ಯಮಾಪನ ಕಾರ್ಯ ಪೂರ್ಣಗೊಳಿಸಿ, ಸಮೀಕ್ಷಾ ಕರ್ತವ್ಯಕ್ಕೆ ಮರಳಿದ್ದು, ಜಿಲ್ಲೆಯಲ್ಲಿ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಇದೀಗ ಭರದಿಂದ ಸಾಗಿದೆ.  ನಿಗದಿತ ಅವಧಿಯೊಳಗೆ ಸಮೀಕ್ಷಾ ಕಾರ್ಯ ಪೂರ್ಣಗೊಳ್ಳುವ ವಿಶ್ವಾಸವಿದೆ.  ಜಿಲ್ಲೆಯಲ್ಲಿ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಕುರಿತಂತೆ ಪ್ರಚಾರ ಕಾರ್ಯಕ್ರಮ ಪರಿಣಾಮಕಾರಿಯಾಗಿದೆ.  ಸಾರ್ವಜನಿಕರಿಂದ ಸಮೀಕ್ಷೆಗೆ ಉತ್ತಮ ಸ್ಪಂದನೆ ದೊರೆಯುತ್ತಿದೆ ಎಂದು ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಸದಸ್ಯ ಡಾ. ಗುರುಲಿಂಗಯ್ಯ ತಿಳಿಸಿದರು. ಹಿಂದುಳಿದ ವರ್ಗ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿ ಬಿ. ಕಲ್ಲೇಶ್ ಅವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

Leave a Reply