ರಾಜ್ಯ ರಾಜಕೀಯ ಬೆಳವಣಿಗೆ ಎಲ್ಲರ ಕುತೂಹಲ

ಸು.ಕೋರ್ಟ್ ಐವರು ಪಕ್ಷೇತರರು ಸೇರಿದಂತೆ 16 ಮಂದಿ ಭಿನ್ನಮತೀಯ ಶಾಸಕರ ಅನರ್ಹತೆಯನ್ನು ರದ್ದುಗೊಳಿಸಿ ತೀರ್ಪು ನೀಡಿದ ಹಿನ್ನೆಲೆಯಲ್ಲಿ ಮಹತ್ತರ ಬೆಳವಣಿಗೆಯೊಂದರಲ್ಲಿ ರಾಜ್ಯಪಾಲ ಎಚ್.ಆರ್.ಭಾರದ್ವಾಜ್ ವಿಧಾನಸಭೆ ಅಮಾನತಿಗೆ ಕೇಂದ್ರ ಸರಕಾರಕ್ಕೆ ಶಿಫಾರಸು ಮಾಡಿದ್ದಾರೆನ್ನಲಾಗಿದೆ. ರಾಜ್ಯದಲ್ಲಿ ಆಡಳಿತ ವ್ಯವಸ್ಥೆ ಸಂಪೂರ್ಣ ಕುಸಿದು ಬಿದ್ದಿದೆ. ಆದುದರಿಂದ ವಿಧಾನಸಭೆಯನ್ನು ಅಮಾನತ್ತಿನಲ್ಲಿಡಬೇಕು ಎಂದು ರಾಜ್ಯಪಾಲರು ರಾಷ್ಟ್ರಾಧ್ಯಕ್ಷೆಗೆ ಪತ್ರ ಬರೆದಿದ್ದಾರೆ. ಈ ಸಂಬಂಧ ಪತ್ರವನ್ನು ತೆಗೆದುಕೊಂಡು ರಾಜ್ಯಪಾಲರ ವಿಶೇಷಾಧಿಕಾರಿ ತಿವಾರಿ ಹೊಸದಿಲ್ಲಿಗೆ ತೆರಳಿದ್ದು, ಕೇಂದ್ರ ಸರಕಾರಕ್ಕೆ ವರದಿ ಸಲ್ಲಿಸಲಿದ್ದಾರೆ ಎಂದು ರಾಜಭವನದ ವಿಶ್ವಸನೀಯ ಮೂಲಗಳು ಹೇಳಿವೆ. ಅಲ್ಲದೆ, ಸುಪ್ರೀಂಕೋರ್ಟ್‌ನ ತೀರ್ಪಿನ ಹಿನ್ನೆಲೆಯಲ್ಲಿ ಕೇಂದ್ರ ಸರಕಾರವು ನಾಳೆ ತುರ್ತು ಸಚಿವ ಸಂಪುಟ ಸಭೆ ನಡೆಸಲಿದೆ ಎಂದು ತಿಳಿದು ಬಂದಿದೆ.

ರಾಷ್ಟ್ರಪತಿ ಎದುರು ಬಿಜೆಪಿ ಶಾಸಕರ ಪರೇಡ್: ಅಮಾನತ್ತುನಲ್ಲಿಟ್ಟು, ರಾಷ್ಟ್ರಪತಿ ಆಳ್ವಿಕೆ ಹೇರಲು ಕೇಂದ್ರ ಸರಕಾರಕ್ಕೆ ಶಿಫಾರಸು ಮಾಡಿರುವ ಹಿನ್ನೆಲೆಯಲ್ಲಿ, ಆಡಳಿತಾರೂಢ ಬಿಜೆಪಿಯು ತನ್ನ 120 ಶಾಸಕರನ್ನು ರಾಷ್ಟ್ರಪತಿ ಎದುರು ಸೋಮವಾರ ಸಂಜೆ ಪರೇಡ್ ಮಾಡಿಸಲು ನಿರ್ಧರಿಸಿದೆ. ಈ ಸಂಬಂಧ ಮುಖ್ಯಮಂತ್ರಿ ಯಡಿಯೂರಪ್ಪ ಬಿಜೆಪಿಯ ರಾಷ್ಟ್ರೀಯ ನಾಯಕರೊಂದಿಗೆ ಚರ್ಚಿಸಿದ್ದಾರೆ.

ರಾಜ್ಯ ರಾಜಕಾರಣದಲ್ಲಿ ಉಂಟಾಗಿರುವ ತಲ್ಲಣದ ಹಿನ್ನೆಲೆಯಲ್ಲಿ ಬಿಜೆಪಿ ರಾಜ್ಯ ಉಸ್ತುವಾರಿ ಧರ್ಮೇಂದ್ರ ಪ್ರಧಾನ್ ನಗರಕ್ಕೆ ಆಗಮಿಸಿದ್ದು, ರೇಸ್‌ಕೋರ್ಸ್ ರಸ್ತೆಯಲ್ಲಿನ ಮುಖ್ಯಮಂತ್ರಿ ನಿವಾಸದಲ್ಲಿ ಮಹತ್ವದ ಮಾತುಕತೆ ನಡೆಸಿದ್ದಾರೆ. ಅಲ್ಲದೆ, ರಾಜ್ಯಸಭಾ ಸದಸ್ಯ ಹಾಗೂ ಬಿಜೆಪಿ ರಾಷ್ಟ್ರೀಯ ಉಪಾಧ್ಯಕ್ಷ ವೆಂಕಯ್ಯನಾಯ್ಡು ಸೋಮವಾರ ಬೆಳಗ್ಗೆ ನಗರಕ್ಕೆ ಆಗಮಿಸಲಿದ್ದಾರೆ.

Please follow and like us:
error