ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆಗೆ ನಿರ್ಧಾರ- ಡಾ. ಸುರೇಶ್ ಇಟ್ನಾಳ್.


ಕೊಪ್ಪಳ ಜು. ೨೯ (ಕವಾ): ಈ ಬಾರಿಯ ಸ್ವಾತಂತ್ರ್ಯ ದಿನಾಚರಣೆಯನ್ನು ಸಡಗರ, ಸಂಭ್ರಮದಿಂದ ಆಚರಿಸಲು ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳುವಂತೆ ಅಪರ ಜಿಲ್ಲಾಧಿಕಾರಿ ಡಾ. ಸುರೇಶ್ ಇಟ್ನಾಳ್ ಅವರು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದರು.ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸ್ವಾತಂತ್ರ್ಯ ದಿನಾಚರಣೆ ಕುರಿತು ಬುಧವಾರ ಏರ್ಪಡಿಸಲಾಗಿದ್ದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು  ಮಾತನಾಡಿದರು.ಬರುವ ಆಗಸ್ಟ್ ೧೫ ರಂದು ಸ್ವಾತಂತ್ರ್ಯ ದಿನಾಚರಣೆಯನ್ನು ಅತ್ಯಂತ ಸಡಗರ, ಸಂಭ್ರಮದಿಂದ ಆಚರಿಸಲು ಅಗತ್ಯ ಸಿದ್ಧತೆಗಳನ್ನು ತ್ವರಿತವಾಗಿ ಕೈಗೊಳ್ಳಬೇಕು.  ಸ್ವಾತಂತ್ರ್ಯ ದಿನಾಚರಣೆಯ ದಿನದಂದು ಬೆಳಿಗ್ಗೆ ೯ ಗಂಟೆಗೆ ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಸಣ್ಣ ನೀರಾವರಿ ಸಚಿವರಾದ ಶಿವರಾಜ್ ತಂಗಡಗಿ ಅವರು ಧ್ವಜಾರೋಹಣ ನೆರವೇರಿಸುವರು.  ಶಾಲಾ ಮಕ್ಕಳು, ಎನ್.ಸಿ.ಸಿ., ಪೊಲೀಸ್ ಇಲಾಖೆ, ಸ್ಕೌಟ್ಸ್ ಮತ್ತು ಗೈಡ್ಸ್ ಮಕ್ಕಳಿಂದ ಆಕರ್ಷಕ ಪಥಸಂಚಲನ, ಅಲ್ಲದೆ ವಿವಿಧ ಶಾಲಾ ಮಕ್ಕಳಿಂದ ಆಕರ್ಷಕ ಕಾರ್ಯಕ್ರಮಗಳು ನೆರವೇರಲಿವೆ. ಅಂದು ಸಂಜೆ ೬ ಗಂಟೆಗೆ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನಗರದ ಸಾರ್ವಜನಿಕ ಮೈದಾನದಲ್ಲಿ ಏರ್ಪಡಿಸಲಾಗುವುದು ಎಂದರು. ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಈ ಬಾರಿ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳನ್ನು ಬಿಂಬಿಸುವ ವಿಶೇಷ ಸ್ತಬ್ಧಚಿತ್ರ ಸಿದ್ಧಪಡಿಸಬೇಕು.  ಈ ರಾಷ್ಟ್ರೀಯ ಕಾರ್ಯಕ್ರಮದಲ್ಲಿ ಸಾರ್ವಜನಿಕರೂ ಸೇರಿದಂತೆ ಎಲ್ಲ ಅಧಿಕಾರಿ, ನೌಕರರು ತಪ್ಪದೆ ಭಾಗವಹಿಸಬೇಕು.  ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ನಗರದ ಪ್ರಮುಖ ಬೀದಿ, ಸರ್ಕಾರದ ಕಚೇರಿ ಕಟ್ಟಡಗಳಿಗೆ ವಿದ್ಯುತ್ ದೀಪಾಲಂಕಾರ ಕೈಗೊಂಡು ಹಬ್ಬದ ವಾತಾವರಣ ನಿರ್ಮಿಸುವಂತಾಗಬೇಕು.  ದಿನಾಚರಣೆ ಅಂಗವಾಗಿ ಕಾರ್ಯಕ್ರಮದಲ್ಲಿ ಭಾಗವಹಿಸುವ ಶಾಲಾ ಮಕ್ಕಳಿಗೆ ಈ ಬಾರಿ ಬೆಳಿಗ್ಗೆಯೇ ಆಯಾ ಶಾಲಾ ಮುಖ್ಯಸ್ಥರು ತಪ್ಪದೆ ಸಿಹಿ ತಿಂಡಿಯ ಜೊತೆಗೆ ಹಾಲು ವಿತರಣೆ ಮಾಡಲು ಅಗತ್ಯ ಕ್ರಮ ಕೈಗೊಳ್ಳಬೇಕು.  ಕಾರ್ಯಕ್ರಮದಲ್ಲಿ ಹಿರಿಯ ಸ್ವಾತಂತ್ರ್ಯ ಹೋರಾಟಗಾರರಿಗೆ ಹಾಗೂ ಮುಖ್ಯಮಂತ್ರಿಗಳಿಂದ ಚಿನ್ನ ಮತ್ತು ಬೆಳ್ಳಿ ಪದಕ ಪಡೆದ ಪೊಲೀಸ್ ಇಲಾಖೆ ಅಧಿಕಾರಿಗಳನ್ನು ಸನ್ಮಾನಿಸಲು ಸೂಕ್ತ ವ್ಯವಸ್ಥೆ ಕೈಗೊಳ್ಳಬೇಕು.  ಆಯಾ ಇಲಾಖೆಗಳಿಗೆ ವಹಿಸಿಕೊಟ್ಟ ಕಾರ್ಯಕ್ರಮವನ್ನು ಯಶಸ್ವಿಯಾಗಿ ನೆರವೇರಿಸಬೇಕು ಎಂದು ಅಪರ ಜಿಲ್ಲಾಧಿಕಾರಿ  ಡಾ. ಸುರೇಶ್ ಇಟ್ನಾಳ್ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.ಸ್ತಬ್ಧಚಿತ್ರಗಳ ಮೆರವಣಿಗೆ ಸಂದರ್ಭದಲ್ಲಿ ವಾಹನ ಸಂಚಾರ ದಟ್ಟಣೆ ನಿಯಂತ್ರಿಸಲು ಸೂಕ್ತ ಪೊಲೀಸ್ ಬಂದೋಬಸ್ತ್ ಕೈಗೊಳ್ಳಬೇಕು.  ನಗರದ ಎಲ್ಲ ಖಾಸಗಿ ಶಾಲೆಯ ಮಕ್ಕಳು ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯುವ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವಂತಾಗಬೇಕು.  ಇದಕ್ಕಾಗಿ ನಗರ ಸಾರಿಗೆ ಬಸ್ ವ್ಯವಸ್ಥೆ ಕೈಗೊಳ್ಳಬೇಕು ಎಂದು ಸಭೆಯಲ್ಲಿ ಭಾಗವಹಿಸಿದ್ದ ಗಣ್ಯರಾದ ಶಿವಾನಂದ ಹೊದ್ಲೂರ್ ಮತ್ತು ನಾಗರಾಜ ಬಳ್ಳಾರಿ ಅವರು ಮನವಿ ಮಾಡಿಕೊಂಡರು.ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದ ಅಂಗವಾಗಿ ಆಕರ್ಷಕ ಕಾರ್ಯಕ್ರಮಗಳನ್ನು ಅಚ್ಚುಕಟ್ಟಾಗಿ ನೆರವೇರಿಸಲು ಅನುಕೂಲವಾಗುವಂತೆ ಸಹಾಯಕ ಆಯುಕ್ತ ಮಂಜುನಾಥ್ ಅಧ್ಯಕ್ಷತೆಯಲ್ಲಿ ವೇದಿಕೆ ಸಮಿತಿ, ಜಿಲ್ಲಾ ಪಂಚಾಯತಿ ಉಪಕಾರ್ಯದರ್ಶಿ ಎನ್.ಕೆ. ತೊರವಿ ಅವರ ಅಧ್ಯಕ್ಷತೆಯಲ್ಲಿ ಸಾಂಸ್ಕೃತಿಕ ಸಮಿತಿ,   ಜಿಲ್ಲಾ ಕಾರ್ಮಿಕ ಅಧಿಕಾರಿಗಳ ನೇತೃತ್ವದ ಸ್ತಬ್ಧಚಿತ್ರ ಸಮಿತಿ ರಚಿಸಲಾಯಿತು.  ಪಥ ಸಂಚಲನದಲ್ಲಿ ಶಿಸ್ತುಬದ್ಧ ಕವಾಯತು ನಡೆಸಲು ವಿದ್ಯಾರ್ಥಿಗಳಿಗೆ ಉತ್ತಮ ತರಬೇತಿ ನೀಡಲು   ಸಭೆಯಲ್ಲಿ ನಿರ್ಧರಿಸಲಾಯಿತು. ಸಭೆಯಲ್ಲಿ ಡಿವೈಎಸ್‌ಪಿ ರಾಜೀವ್, ಜಿಲ್ಲಾ ನೊಂದಣಾಧಿಕಾರಿ ಅಶೋಕ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಶ್ರೀಕಾಂತ್ ಬಾಸೂರ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಕೊಟ್ರಪ್ಪ ಚೋರನೂರ, ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕಿ ಶಾರದಾ, ನಗರಸಭೆ ಪೌರಾಯುಕ್ತ ರಮೇಶ್ ಪಟ್ಟೇದಾರ್ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಭಾಗವಹಿಸಿದ್ದರು.

Related posts

Leave a Comment