ಹೈ-ಕ ಅಭಿವೃದ್ಧಿಗೆ ಈ ವರ್ಷ ೧೦೦೦ ಕೋಟಿ ರೂ. ಅನುದಾನ- ಸಿಎಂ ಸಿದ್ದರಾಮಯ್ಯ

ಹಲವು ಕ್ಷೇತ್ರಗಳಲ್ಲಿ ಹಿಂದುಳಿದ ಹೈದ್ರಾಬಾದ್-ಕರ್ನಾಟಕ ಪ್ರದೇಶದ ಜಿಲ್ಲೆಗಳ ಸಮಗ್ರ ಅಭಿವೃದ್ಧಿಗಾಗಿ ಹೈದ್ರಾಬಾದ್-ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಗೆ ಈ ವರ್ಷ ೧೦೦೦ ಕೋಟಿ ರೂ. ಅನುದಾನ ಒದಗಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದರು.

  ಕೊಪ್ಪಳ ಜಿಲ್ಲೆ ಕುಷ್ಟಗಿ ಪಟ್ಟಣದಲ್ಲಿ ಬುಧವಾರ ಏರ್ಪಡಿಸಲಾಗಿದ್ದ ಕುಷ್ಟಗಿ ವಿಧಾನಸಭಾ ಕ್ಷೇತ್ರದ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಚಾಲನೆ ನೀಡುವ ಸಮಾರಂಭದ ಉದ್ಘಾಟನೆ ನೆರವೇರಿಸಿ ಅವರು ಮಾತನಾಡಿದರು.
  ಹೈದ್ರಾಬಾದ್-ಕರ್ನಾಟಕ ಪ್ರದೇಶಕ್ಕೆ ವಿಶೇಷ ಸ್ಥಾನಮಾನ ನೀಡುವ ೩೭೧ (ಜೆ) ಕಲಂ ತಿದ್ದುಪಡಿ ಸೌಲಭ್ಯವನ್ನು ರಾಜ್ಯ ಸರ್ಕಾರ ಶೀಘ್ರ ಅನುಷ್ಠಾನಗೊಳಿಸುವ ಮೂಲಕ ನುಡಿದಂತೆ ನಡೆದಿದೆ.  ಇದರಿಂದಾಗಿ ಈ ಭಾಗದ ಜಿಲ್ಲೆಯವರಿಗೆ ವಿಶೇಷ ಅನುದಾನ, ಶಿಕ್ಷಣ ಮತ್ತು ಉದ್ಯೋಗದಲ್ಲಿ ಮೀಸಲಾತಿ ದೊರೆಯುತ್ತಿದೆ.  ಈ ಭಾಗದ ಬಹಳಷ್ಟು ಯುವಕರಿಗೆ ಮೆಡಿಕಲ್, ಇಂಜಿನಿಯರಿಂಗ್ ಸೇರಿದಂತೆ ವಿವಿಧ ಉನ್ನತ ಶಿಕ್ಷಣ ದೊರಕಲಿದೆ.  ಹಲವು ಕ್ಷೇತ್ರಗಳಲ್ಲಿ ಹಿಂದುಳಿದಿರುವ ಹೈದ್ರಾಬಾದ್-ಕರ್ನಾಟಕ ಪ್ರದೇಶದ ಜಿಲ್ಲೆಗಳ ಸಮಗ್ರ ಅಭಿವೃದ್ಧಿಗಾಗಿ ಹೈ-ಕ ಪ್ರದೇಶಾಭಿವೃದ್ಧಿ ಮಂಡಳಿಗೆ ೬೦೦ ಕೋಟಿ ರೂ. ಅನುದಾನ ಒದಗಿಸಲಾಗಿತ್ತು.  ಇಲ್ಲಿನ ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡುವ ಉದ್ದೇಶದಿಂದ ಇನ್ನೂ ೪೦೦ ಕೋಟಿ ರೂ. ಹೆಚ್ಚುವರಿ ಅನುದಾನ ಸೇರಿದಂತೆ ಒಟ್ಟು ೧೦೦೦ ಕೋಟಿ ರೂ. ಅನುದಾನ ಒದಗಿಸಲಾಗಿದೆ.  ಮುಂದಿನ ವರ್ಷ ಇನ್ನೂ ಹೆಚ್ಚಿನ ಅನುದಾನ ಒದಗಿಸುವ ಮೂಲಕ ಹಿಂದುಳಿದ ಈ ಭಾಗದ ಅಭಿವೃದ್ಧಿಗೆ ಸರ್ಕಾರ ತನ್ನ ಬದ್ಧತೆಯನ್ನು ಪ್ರದರ್ಶಿಸಲಿದೆ.  ಈ ಅನುದಾನವನ್ನು ಹೊರತುಪಡಿಸಿ, ಡಾ. ನಂಜುಂಡಪ್ಪ ಅವರ ವರದಿಯನ್ವಯ ಪ್ರಾದೇಶಿಕ ಅಸಮತೋಲನ ನಿವಾರಣೆಗಾಗಿ ನೀಡಿದ ವರದಿಯನ್ವಯ ಪ್ರತ್ಯೇಕ ಅನುದಾನವನ್ನು ಈ ಭಾಗದ ಜಿಲ್ಲೆಗಳಿಗೆ ಒದಗಿಸಲಾಗುವುದು.  ರಾಜ್ಯದಲ್ಲಿ ವಿದ್ಯುತ್ ಪೂರೈಕೆ ಸಮಸ್ಯೆಗೆ ಉತ್ಪಾದನೆಯ ಕೊರತೆ ಕಾರಣವಾಗಿದೆ.  ಒಂದು ವೇಳೆ ಹೆಚ್ಚಿನ ವಿದ್ಯುತ್ ಉತ್ಪಾದನೆಯಾದಲ್ಲಿ, ಅದಕ್ಕೆ ಪೂರಕವಾಗಿ ಕಾರಿಡಾರ್ ವ್ಯವಸ್ಥೆ ಇಲ್ಲ.  ಇನ್ನು ಎರಡು ವರ್ಷದೊಳಗೆ ಅಗತ್ಯ ವ್ಯವಸ್ಥೆ ಕಲ್ಪಿಸಿಕೊಂಡು ವಿದ್ಯುತ್ ಸಮಸ್ಯೆ ಪರಿಹರಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದರು.
ಕುಡಿಯುವ ನೀರಿನ ಯೋಜನೆಗೆ ೭೫೦ ಕೋಟಿ : ಕುಷ್ಟಗಿ ಮತ್ತು ಯಲಬುರ್ಗಾ ತಾಲೂಕಿನ ನೂರಾರು ಗ್ರಾಮಗಳು ಶುದ್ಧ ಕುಡಿಯುವ ನೀರು ಸರಬರಾಜಿನ ತೊಂದರೆಯನ್ನು ಎದುರಿಸುತ್ತಿವೆ.  ಇದನ್ನು ನಿವಾರಿಸಲು ಈ ಭಾಗದ ೩೨೯ ಗ್ರಾಮಗಳಿಗೆ ನಾರಾಯಣಪುರ ಜಲಾಶಯದ ಕೃಷ್ಣಾ ಹಿನ್ನೀರಿನಿಂದ ಶುದ್ಧ ಕುಡಿಯುವ ನೀರು ಒದಗಿಸುವ ೭೫೦ ಕೋಟಿ ರೂ. ಗಳ ವೆಚ್ಚದ ಬೃಹತ್ ಯೋಜನೆಗೆ ಶೀಘ್ರದಲ್ಲೆ ಟೆಂಡರ್ ಪ್ರಕ್ರಿಯೆ ಪ್ರಾರಂಭಿಸಲಾಗುವುದು.  ಈ ಯೋಜನೆಯ ಜಾರಿಯಿಂದ ೩೨೯ ಗ್ರಾಮಗಳ ಕುಡಿಯುವ ನೀರಿನ ಸಮಸ್ಯೆ ಶಾಶ್ವತವಾಗಿ ಪರಿಹಾರವಾಗಲಿದೆ ಎಂದರು.
ಕುಷ್ಟಗಿಗೆ ೨೪*೭ ಕುಡಿಯುವ ನೀರು : ಕುಷ್ಟಗಿ ಪಟ್ಟಣಕ್ಕೆ ೨೪*೭ ಕುಡಿಯುವ ನೀರು ಸರಬರಾಜು ವ್ಯವಸ್ಥೆ ಕೈಗೊಳ್ಳಲು ಈಗಾಗಲೆ ೨೪ ಕೋಟಿ ರೂ.ಗಳ ಮೊತ್ತಕ್ಕೆ ಟೆಂಡರ್ ಪ್ರಕ್ರಿಯೆ ಆಗಿದ್ದು, ನೀರು ವಿತರಣಾ ಪೈಪ್‌ಲೈನ್ ಇತ್ಯಾದಿ ಕಾಮಗಾರಿಗೆ ೨೫ ಕೋಟಿ ರೂ. ಹೆಚ್ಚುವರಿ ಅನುದಾನ ನೀಡಲಾಗುವುದು.  ಅಲ್ಲದೆ ಕುಷ್ಟಗಿ ಪಟ್ಟಣಕ್ಕೆ ಒಳಚರಂಡಿ ವ್ಯವಸ್ಥೆ ಹಾಗೂ ರಸ್ತೆ ಸುಧಾರಣಾ ಕಾಮಗಾರಿಗೆ ೫೫ ಕೋಟಿ ರೂ. ಅನುದಾನ ಒದಗಿಸಲು ಸರ್ಕಾರ ಕ್ರಮ ಕೈಗೊಂಡಿದೆ ಎಂದರು.
ಕನಕ-ವಾಲ್ಮೀಕಿ ಭವನಕ್ಕೆ ಹೆಚ್ಚುವರಿ ಅನುದಾನ : ಕುಷ್ಟಗಿ ಪಟ್ಟಣದಲ್ಲಿ ವಾಲ್ಮೀಕಿ ಭವನ ನಿರ್ಮಾಣಕ್ಕೆ ಈಗಾಗಲೆ ೦೧ ಕೋಟಿ ರೂ. ಅನುದಾನ ಒದಗಿಸಲಾಗಿದೆ.  ಅಲ್ಲದೆ ಶೀಘ್ರದಲ್ಲೇ ಕನಕ ಭವನ ನಿರ್ಮಾಣಕ್ಕೂ ೦೧ ಕೋಟಿ ರೂ. ಅನುದಾನ ಒದಗಿಸಲಾಗುವುದು.  ಅಗತ್ಯ ಬಿದ್ದಲ್ಲಿ ಇನ್ನೂ ಹೆಚ್ಚಿನ ಅನುದಾನ ಒದಗಿಸಲು ಸರ್ಕಾರ ಸಿದ್ಧವಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದರು.
  ಜಿಲ್ಲಾ ಉಸ್ತುವಾರಿ ಮತ್ತು ಸಣ್ಣ ನೀರಾವರಿ ಸಚಿವ ಶಿವರಾಜ ತಂಗಡಗಿ ಅವರು ಮಾತನಾಡಿ, ಬಡಜನರ ಶ್ರೇಯೋಭಿವೃದ್ಧಿಗಾಗಿ ಸರ್ಕಾರ ಅನ್ನಭಾಗ್ಯ, ಕ್ಷೀರಭಾಗ್ಯ ಯೋಜನೆಗಳನ್ನು ಜಾರಿಗೊಳಿಸಿದ್ದು, ಹೈದ್ರಾಬಾದ್-ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಯಿಂದ ಕುಷ್ಟಗಿ ತಾಲೂಕಿಗೆ ಈಗಾಗಲೆ ೨೦ ಕೋಟಿ ರೂ. ಅನುದಾನ ಒದಗಿಸಿದೆ.  ಕೃಷ್ಣಾ-ಬಿ ಸ್ಕೀಂ ಮೂಲಕ ಈ ಭಾಗಕ್ಕೆ ಸೂಕ್ಷ್ಮ ನೀರಾವರಿ ಕಲ್ಪಿಸುವ ಕೊಪ್ಪಳ ಏತ ನೀರಾವರಿ ಯೋಜನೆಯನ್ನು ಮೂರು ವರ್ಷದೊಳಗೆ ಪೂರ್ಣಗೊಳಿಸಲಾಗುವುದು ಎಂದರು.
  ಕುಷ್ಟಗಿ ಶಾಸಕ ದೊಡ್ಡನಗೌಡ ಪಾಟೀಲ್ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು, ಪ್ರಾಸ್ತಾವಿಕವಾಗಿ ಮಾತನಾಡಿದ ಅವರು, ಕ್ಷೇತ್ರದಲ್ಲಿ ವಿದ್ಯುತ್ ಸಮಸ್ಯೆ ಹೆಚ್ಚಿದೆ, ಇಲ್ಲಿನ ರೈತರು ಮಳೆ ಮತ್ತು ಬೋರ್‌ವೆಲ್ ನೀರಾವರಿ ಆಶ್ರಯಿಸಿದ್ದು, ಈ ಭಾಗದ ಕೆರೆಗಳನ್ನು ತುಂಬಿಸುವಂತಹ ಯೋಜನೆಗಳಿಗೆ ಮಂಜೂರಾತಿ ನೀಡುವಂತೆ ಮುಖ್ಯಮಂತ್ರಿಗಳಿಎ ಮನವಿ ಮಾಡಿದರು.
  ಸಂಸದ ಸಂಗಣ್ಣ ಕರಡಿ ಅವರು ಮಾತನಾಡಿ, ಕೃಷ್ಣಾ- ಬಿ ಸ್ಕೀಂ ಯೋಜನೆಯಲ್ಲಿ ಈ ಭಾಗಕ್ಕೆ ಹೆಚ್ಚುವರಿಯಾಗಿ ೫ ಟಿ.ಎಂ.ಸಿ. ನೀರನ್ನು ಹಂಚಿಕೆ ಮಾಡಬೇಕು.  ಗದಗ-ವಾಡಿ ರೈಲ್ವೆ ಯೋಜನೆಗೆ ಭೂಸ್ವಾಧೀನ ಕಾರ್ಯ ರಾಜ್ಯ ಸರ್ಕಾರದ ಹೊಣೆಯಾಗಿದ್ದು, ಶೀಘ್ರ ಭೂಸ್ವಾಧೀನ ಪ್ರಕ್ರಿಯೆ ನಡೆಸಬೇಕು ಎಂದು ಮನವಿ ಮಾಡಿದರು.
  ಕಾರ್ಯಕ್ರಮದಲ್ಲಿ ಕಾಗಿನೆಲೆ ಕನಕ ಗುರುಪೀಠದ ಶ್ರೀ ನಿರಂಜನಾನಂದಪುರಿ ಸ್ವಾಮೀಜಿಗಳು, ರಾಜನಹಳ್ಳಿ ವಾಲ್ಮೀಕಿ ಗುರುಪೀಠದ ಶ್ರೀ ಪ್ರಸನ್ನಾನಂದಪುರಿ ಸ್ವಾಮೀಜಿಗಳು ಸಮಾರಂಭದ ದಿವ್ಯ ಸಾನಿಧ್ಯ ವಹಿಸಿದ್ದರು.  ಲೋಕೋಪಯೋಗಿ ಸಚಿವ ಡಾ. ಹೆಚ್.ಸಿ. ಮಹದೇವಪ್ಪ, ಸಮಾಜ ಕಲ್ಯಾಣ ಸಚಿವ ಹೆಚ್. ಆಂಜನೇಯ, ಶಾಸಕರುಗಳಾದ ಬಸವರಾಜ ರಾಯರಡ್ಡಿ, ರಾಘವೇಂದ್ರ ಹಿಟ್ನಾಳ್, ಇಕ್ಬಾಲ್ ಅನ್ಸಾರಿ, ಹಾಲಪ್ಪ ಆಚಾರ್, ಸುರೇಶ್ ಭೈರತಿ, ಹುನಗುಂದ ಶಾಸಕ ಕಾಶಪ್ಪನವರ್, ಜಿ.ಪಂ. ಅಧ್ಯಕ್ಷ ಅಮರೇಶ್ ಕುಳಗಿ, ಕರ್ನಾಟಕ ರಾಜ್ಯ ಕೈಮಗ್ಗ ಅಭಿವೃದ್ಧಿ ನಿಗಮದ ಅಧ್ಯಕ್ಷ ಮಲ್ಲಿಕಾರ್ಜುನ ನಾಗಪ್ಪ, ರಾಜ್ಯ ಮೂಲಭೂತ ಸೌಕರ್ಯ ಅಭಿವೃದ್ಧಿ ನಿಗಮ ಅಧ್ಯಕ್ಷ ಶ್ರೀಶೈಲ ದಳವಾಯಿ, ಪುರಸಭೆ ಅಧ್ಯಕ್ಷೆ ಮಂಜುಳಾ ನಾಗರಾಳ, ಹೈ-ಕ ಪ್ರದೇಶಾಭಿವೃದ್ಧಿ ಮಂಡಳಿ ಕಾರ್ಯದಶಿ ಹಾಗೂ ಕಲಬುರಗಿ ಪ್ರಾದೇಶಿಕ ಆಯುಕ್ತ ಅಮ್ಲನ್ ಆದಿತ್ಯ ಬಿಸ್ವಾಸ್, ಮಾಜಿ ಶಾಸಕರುಗಳಾದ ಅಮರೇಗೌಡ ಬಯ್ಯಾಪುರ, ಬಸವರಾಜ ಹಿಟ್ನಾಳ್, ಶರಣಪ್ಪ ಮುಂತಾದ ಗಣ್ಯರು ಸಮಾರಂಭದಲ್ಲಿ ಭಾಗವಹಿಸಿದ್ದರು.  ಜಿಲ್ಲಾಧಿಕಾರಿ ಆರ್.ಆರ್. ಜನ್ನು ಸ್ವಾಗತಿಸಿದರು. ಜಿ.ಪಂ. ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೃಷ್ಣ ಉದಪುಡಿ ವಂದಿಸಿದರು.  ಕುಷ್ಟಗಿ ವಿಧಾನಸಭಾ ಕ್ಷೇತ್ರದ ಹತ್ತು ಹಲವು ಯೋಜನೆಗಳಿಗೆ ಮುಖ್ಯಮಂತ್ರಿಗಳು ಇದೇ ಸಂದರ್ಭದಲ್ಲಿ ಚಾಲನೆ ನೀಡಿದರು.

Leave a Reply