ವಿದ್ಯಾರ್ಥಿಗಳು ದೃಢವಿಶ್ವಾಸ ಬೆಳೆಸಿಕೊಳ್ಳಬೇಕು- ಜಿಲ್ಲಾಧಿಕಾರಿ ತುಳಸಿ ಮದ್ದಿನೇನಿ

ಕೊಪ್ಪಳ ಮೇ. : ಪರೀಕ್ಷೆಯಲ್ಲಿ ಉತ್ತಮ ಸಾಧನೆ ತೋರಲು, ವಿದ್ಯಾರ್ಥಿಗಳು ಆತ್ಮಸ್ಥೈರ್ಯ ಹೆಚ್ಚಿಸಿಕೊಳ್ಳಬೇಕು. ಗುರಿ ಸಾಧಿಸುವ ದೃಢವಿಶ್ವಾಸ ಬೆಳೆಸಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ತುಳಸಿ ಮದ್ದಿನೇನಿ ಅವರು ವಿದ್ಯಾರ್ಥಿಗಳಿಗೆ ಕರೆ ನೀಡಿದರು.
ಜಿಲ್ಲಾ ಪಂಚಾಯತಿ ಸಭಾಂಗಣದಲ್ಲಿ, ಈ ಬಾರಿಯ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕಗಳಿಸಿದ ವಿದ್ಯಾರ್ಥಿಗಳು ಹಾಗೂ ಶೇ. ೧೦೦ ರಷ್ಟು ಫಲಿತಾಂಶ ಪಡೆದ ಶಾಲೆಗಳ ಮುಖ್ಯಗುರುಗಳಿಗೆ ಅಭಿನಂದಿಸಲು ಏರ್ಪಡಿಸಲಾಗಿದ್ದ ಅಭಿನಂದನಾ ಸಮಾರಂಭದ ಉದ್ಘಾಟನೆ ನೆರವೇರಿಸಿ ಅವರು ಮಾತನಾಡುತ್ತಿದ್ದರು.
ವಿದ್ಯಾರ್ಥಿಗಳಿಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆಯು ಶೈಕ್ಷಣಿಕವಾಗಿ ಪ್ರಮುಖ ಘಟ್ಟವಾಗಿದ್ದು, ಈ ಪರೀಕ್ಷೆಯಲ್ಲಿ ಉತ್ತಮ ಸಾಧನೆ ತೋರಿದಲ್ಲಿ, ಅವರ ಭವಿಷ್ಯದ ಹಾದಿ ಸುಗಮವಾಗಲಿದೆ. ಕೊಪ್ಪಳ ಜಿಲ್ಲೆ ಈ ಬಾರಿ ಎಸ್‌ಎಸ್‌ಎಲ್‌ಸಿ ಫಲಿತಾಂಶದಲ್ಲಿ ರಾಜ್ಯದಲ್ಲಿಯೇ ೨೦ ನೇ ಸ್ಥಾನ ಪಡೆದು ಉತ್ತಮ ಸಾಧನೆ ಮಾಡಿದೆ. ಮುಂಬರುವ ವರ್ಷದಲ್ಲಿ ಕೊಪ್ಪಳ ಜಿಲ್ಲೆ ರಾಜ್ಯಕ್ಕೆ ೧೦ ನೇ ಸ್ಥಾನ ಪಡೆಯುವಂತೆ ಮಾಡುವ ಗುರಿಯನ್ನು ಕೊಪ್ಪಳ ಜಿಲ್ಲಾಡಳಿತ ಹೊಂದಿದೆ. ಈ ನಿಟ್ಟಿನಲ್ಲಿ ಅಗತ್ಯವಿರುವ ಎಲ್ಲ ಸಹಕಾರವನ್ನು ನೀಡಲು ಜಿಲ್ಲಾಡಳಿತ ಸಿದ್ಧವಿದೆ. ಪಾಲಕರು, ಪೋಷಕರು ತಮ್ಮ ಮಕ್ಕಳಿಗೆ ಉತ್ತಮ ಶಿಕ್ಷಣ ಕೊಡಿಸಬೇಕು. ವಿದ್ಯಾರ್ಥಿಗಳ ಮನಸ್ಸಿನಲ್ಲಿ ಪಾಲಕರು ಆತ್ಮಸ್ಥೈರ್ಯ ತುಂಬಬೇಕು. ಅವರಲ್ಲಿ ದೃಢವಿಶ್ವಾಸ ನೀಡಬೇಕು. ಶಿಕ್ಷಕರು ವಿದ್ಯಾರ್ಥಿಗಳಲ್ಲಿ ಅಡಗಿರುವ ಸುಪ್ತ ಪ್ರತಿಭೆಯನ್ನು ಹೊರ ಹಾಕುವ ಪ್ರಯತ್ನ ಮಾಡಬೇಕು ಎಂದು ತಿಳಿಸಿದ ಜಿಲ್ಲಾಧಿಕಾರಿ ತುಳಸಿ ಅವರು ಉತ್ತಮ ಸಾಧನೆಗೈದ ವಿದ್ಯಾರ್ಥಿಗಳು ಹಾಗೂ ಶಿಕ್ಷಕರನ್ನು ಅಭಿನಂದಿಸಿದರು.
ಕೊಪ್ಪಳ ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕರಾಗಿ ಈ ಹಿಂದೆ ಕಾರ್ಯ ನಿರ್ವಹಿಸಿ ಸದ್ಯ ಗುಲಬರ್ಗಾದ ಸಿ.ಟಿ.ಇ. ಮುಖ್ಯ ರೀಡರ್ ಆಗಿರುವ ಬಿ.ವಿ. ರಾಜೇಂದ್ರ ಪ್ರಸಾದ್ ಅವರು ಮಾತನಾಡಿ ಎಸ್‌ಎಸ್‌ಎಲ್‌ಸಿ ಫಲಿತಾಂಶದಲ್ಲಿ ಕೊಪ್ಪಳ ಜಿಲ್ಲೆ ಉತ್ತಮ ಸಾಧನೆ ತೋರಲು ಶ್ರಮಿಸಿದ ಈ ಹಿಂದಿನ ಜಿಲ್ಲಾಧಿಕಾರಿ ಕೆ.ಎಸ್. ಸತ್ಯಮೂರ್ತಿ ಅವರ ಸಹಕಾರವನ್ನು ಸ್ಮರಿಸುವುದು ಇಂದು ಅಗತ್ಯವಾಗಿದೆ. ವಿದ್ಯಾರ್ಥಿಗಳ ಶಿಕ್ಷಣ ಗುಣಮಟ್ಟವನ್ನು ಹೆಚ್ಚಿಸಲು ಶಿಕ್ಷಣ ಇಲಾಖೆ ಕೈಗೊಂಡ ಹಲವು ಬಗೆಯ ವಿನೂತನ ಕಾರ್ಯಕ್ರಮಗಳು ಸಾಧನೆಗೆ ಸಹಕಾರಿಯಾದವು. ಜಿಲ್ಲೆಯಲ್ಲಿ ಮಕ್ಕಳ ಪ್ರತಿಭೆಗೆ ಆಗಲಿ, ಶಿಕ್ಷಕರ ಬುದ್ದಿವಂತಿಕೆಗೆ ಆಗಲಿ ಕೊರತೆಯಿಲ್ಲ, ಆದರೆ ಆ ಮಕ್ಕಳಲ್ಲಿನ ಪ್ರತಿಭೆಗೆ ಹೊಸ ರೂಪು ತಂದು ಅವರನ್ನು ಉತ್ತೇಜಿಸುವಂತಹ ಕಾರ್ಯ ನಿರಂತರವಾಗಿ ನಡೆಯಬೇಕಾಗಿದೆ ಎಂದು ಅಭಿಪ್ರಾಯಪಟ್ಟರು.
ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಈ ಬಾರಿ ಅತಿ ಹೆಚ್ಚು ಅಂದರೆ ೬೨೫ ಕ್ಕೆ ೬೧೨ (ಶೇ. ೯೭. ೯೨) ಅಂಕಗಳಿಸಿ ಕೊಪ್ಪಳ ಜಿಲ್ಲೆಗೆ ಪ್ರಥಮ ಸ್ಥಾನ ಪಡೆದ ಕೊಪ್ಪಳದ ಮೊರಾರ್ಜಿ ದೇಸಾಯಿ ವಸತಿ ಶಾಲೆ ವಿದ್ಯಾರ್ಥಿ ಗೋಪಿನಾಯಕ್ ತನ್ನ ಅನುಭವವನ್ನು ಹಂಚಿಕೊಳ್ಳುತ್ತ, ಕುಟುಂಬದಲ್ಲಿನ ಆರ್ಥಿಕ ಸ್ಥಿತಿ ಕಷ್ಟಕರವಾಗಿದ್ದರೂ, ನಮ್ಮ ತಂದೆ, ತಾಯಿ, ಶಿಕ್ಷಕರು, ವಸತಿ ನಿಲಯದ ಮೇಲ್ವಿಚಾರಕರ ಬೆಂಬಲ ಹಾಗೂ ಸಹಕಾರದಿಂದ ಉತ್ತಮ ಸಾಧನೆ ಮಾಡಲು ಸಾಧ್ಯವಾಯಿತು ಎಂದರು.
ಇದೇ ಸಂದರ್ಭದಲ್ಲಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಜಿಲ್ಲೆಯ ಒಟ್ಟು ೩೮ ವಿದ್ಯಾರ್ಥಿಗಳಿಗೆ ಅಲ್ಲದೆ ಶೇ. ೧೦೦ ರಷ್ಟು ಫಲಿತಾಂಶ ಪಡೆದ ಜಿಲ್ಲೆಯ ಒಟ್ಟು ೪೦ ಶಾಲೆಗಳ ಮುಖ್ಯ ಶಿಕ್ಷಕರಿಗೆ ಪ್ರಶಸ್ತಿ ಪತ್ರ ನೀಡಿ ಗೌರವಿಸಲಾಯಿತು.
ಸಮಾರಂಭದಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಚ್. ಮೂರ್ತಿ, ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ಮಂಟೆಲಿಂಗಾಚಾರ್, ಜಿಲ್ಲಾ ಸಮಾಜಕಲ್ಯಾಣಾಧಿಕಾರಿ ಬಿ. ಕಲ್ಲೇಶ್ ಸೇರಿದಂತೆ ಕ್ಷೇತ್ರ ಶಿಕ್ಷಣಾಧಿಕಾರಿಗಳು, ಉತ್ತಮ ಸಾಧನೆಗೈದ ವಿದ್ಯಾರ್ಥಿಗಳು ಅವರ ಪೋಷಕರು, ಪಾಲಕರು, ಶಿಕ್ಷಕರು ಭಾಗವಹಿಸಿದ್ದರು

Please follow and like us:
error