ಸಡಗರದ ಗಣರಾಜ್ಯೋತ್ಸವ ಆಚರಣೆಗೆ ಸಿದ್ಧತೆ.

ಕೊಪ್ಪಳ ಜ. ೧೪ (ಕ.ವಾ) ಪ್ರತಿ ವರ್ಷದಂತೆ ಈ ಬಾರಿಯೂ ಗಣರಾಜ್ಯೋತ್ಸವವನ್ನು ಸಡಗರ, ಸಂಭ್ರಮದಿಂದ ಆಚರಿಸಲಾಗುವುದು ಎಂದು ಜಿಲ್ಲಾಧಿಕಾರಿ ಎಂ. ಕನಗವಲ್ಲಿ ಅವರು ಹೇಳಿದರು.
     ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಗುರುವಾರದಂದು ಏರ್ಪಡಿಸಲಾಗಿದ್ದ ಗಣರಾಜ್ಯೋತ್ಸವ ಆಚರಣೆ ಕುರಿತ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
     ಜನವರಿ ೨೬ ರಂದು ಗಣರಾಜ್ಯೋತ್ಸವವನ್ನು ಸಡಗರ, ಸಂಭ್ರಮದಿಂದ ಆಚರಿಸಲಾಗುವುದು.  ಅಂದು ಬೆಳಿಗ್ಗೆ ೦೯ ಗಂಟೆಗೆ ಜಿಲ್ಲಾ ಕ್ರೀಡಾಂಗಣದಲ್ಲಿ, ಜಿಲ್ಲಾ ಉಸ್ತುವಾರಿ ಹಾಗೂ ರಾಜ್ಯ ಸಣ್ಣ ನೀರಾವರಿ ಸಚಿವ ಶಿವರಾಜ್ ತಂಗಡಗಿ ಅವರು ಧ್ವಜಾರೋಹಣ ನೆರವೇರಿಸುವರು.  ಧ್ವಜಾರೋಹಣ ಸಮಾರಂಭದಲ್ಲಿ ಪೊಲೀಸ್, ಎನ್.ಸಿ.ಸಿ., ಗೃಹರಕ್ಷಕ ದಳ, ಸ್ಕೌಟ್ಸ್, ಗೈಡ್ಸ್, ರಾಷ್ಟ್ರೀಯ ಸೇವಾದಳ ತಂಡಗಳು ಕವಾಯತು ಕಾರ್ಯಕ್ರಮ ನಡೆಸಿಕೊಡಲಿದ್ದಾರೆ.  ಧ್ವಜವಂದನೆ ಕಾರ್ಯಕ್ರಮದ ನಂತರ ಸಾಂಸ್ಕೃತಿಕ ಕಾರ್ಯಕ್ರಮಗಳು ಹಾಗೂ ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸಾಧನೆ ಮಾಡಿರುವ ಮಹನೀಯರುಗಳಿಗೆ ಸನ್ಮಾನ ಅಲ್ಲದೆ ಅತ್ಯುತ್ತಮ ನಾಗರಿಕ ಸೇವೆಗಾಗಿ ಸರ್ಕಾರಿ ಅಧಿಕಾರಿ, ಸಿಬ್ಬಂದಿಗಳಿಗೆ ಕೊಡಮಾಡುವ ಸರ್ವೋತ್ತಮ ಸೇವಾ ಪ್ರಶಸ್ತಿ ಪ್ರದಾನ ಮಾಡಲಾಗುವುದು. ವಿವಿಧ ಇಲಾಖೆಗಳ ಅಭಿವೃದ್ಧಿ ಕಾರ್ಯಕ್ರಮಗಳನ್ನು ಬಿಂಬಿಸುವ ಸ್ತಬ್ಧ ಚಿತ್ರಗಳ ಪ್ರದರ್ಶನ ನಡೆಯಲಿದೆ.    ದಿನಾಚರಣೆ ಅಂಗವಾಗಿ ನಗರದ ಪ್ರಮುಖ ವೃತ್ತ, ಸರ್ಕಾರದ ಕಚೇರಿ ಕಟ್ಟಡಗಳಿಗೆ ವಿದ್ಯುತ್ ದೀಪಾಲಂಕಾರ ಕೈಗೊಂಡು ಹಬ್ಬದ ವಾತಾವರಣ ನಿರ್ಮಿಸುವಂತಾಗಬೇಕು. ಗಣರಾಜ್ಯೋತ್ಸವ ದಿನಾಚರಣೆಯ ಯಶಸ್ವಿಗಾಗಿ ಉಪಸಮಿತಿಗಳನ್ನು ರಚಿಸಲಾಗಿದ್ದು, ಜಿ.ಪಂ. ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಆರ್. ರಾಮಚಂದ್ರನ್ ಅವರ ಅಧ್ಯಕ್ಷತೆಯಲ್ಲಿ ಸ್ತಬ್ಧ ಚಿತ್ರಗಳ ಪ್ರದರ್ಶನ ಸಮಿತಿ ನೇಮಿಸಲಾಗಿದೆ.  ಉಪವಿಭಾಗಾಧಿಕಾರಿ ಇಸ್ಮಾಯಿಲ್ ಸಾಹೆಬ್ ಶಿರಹಟ್ಟಿ ಅವರ ನೇತೃತ್ವದಲ್ಲಿ ಸನ್ಮಾನ ಸಮಿತಿ ರಚಿಸಲಾಗಿದೆ.  ಗಣರಾಜ್ಯೋತ್ಸವ ಕಾರ್ಯಕ್ರಮ ಯಶಸ್ವಿಗೊಳಿಸಲು ಆಯಾ ಉಪಸಮಿತಿ ಅಧ್ಯಕ್ಷರು ಕೂಡಲೆ ಸಭೆ ಕರೆದು ನಗರದ
ವಿವಿಧ ಸಂಘ ಸಂಸ್ಥೆಗಳ ಅಧ್ಯಕ್ಷರು, ಪದಾಧಿಕಾರಿಗಳೊಂದಿಗೆ ಸಭೆ ನಡೆಸಿ ಅಗತ್ಯ ಕ್ರಮ
ಕೈಗೊಳ್ಳಬೇಕು.  ಆಯಾ ಇಲಾಖೆಗಳಿಗೆ ವಹಿಸಿಕೊಟ್ಟ ಕಾರ್ಯಕ್ರಮವನ್ನು ಯಶಸ್ವಿಯಾಗಿ
ನೆರವೇರಿಸಬೇಕು ಎಂದು  ಜಿಲ್ಲಾಧಿಕಾರಿ ಎಂ. ಕನಗವಲ್ಲಿ ಅವರು ಅಧಿಕಾರಿಗಳಿಗೆ ಸೂಚನೆ
ನೀಡಿದರು.
     ಸಭೆಯಲ್ಲಿ ಭಾಗವಹಿಸಿದ್ದ ಅಪರ ಜಿಲ್ಲಾಧಿಕಾರಿ ಡಾ. ಪ್ರವೀಣಕುಮಾರ್
ಜಿ.ಎಲ್. ಅವರು ಮಾತನಾಡಿ, ಈ ಬಾರಿ ಗಣರಾಜ್ಯೋತ್ಸವ ಆಚರಣೆ ಸಂದರ್ಭದಲ್ಲಿ ಗರಿಷ್ಠ
ಸಂಖ್ಯೆಯಲ್ಲಿ ವಿದ್ಯಾರ್ಥಿಗಳನ್ನು ಬಳಸಿಕೊಂಡು ಆಕರ್ಷಕ ಸಾಂಸ್ಕೃತಿಕ ಕಾರ್ಯಕ್ರಮ
ಹಮ್ಮಿಕೊಳ್ಳಬೇಕು.  ಸರ್ವೋತ್ತಮ ಸೇವಾ ಪ್ರಶಸ್ತಿಗಾಗಿ ಸರ್ಕಾರಿ ಅಧಿಕಾರಿ/ಸಿಬ್ಬಂದಿಗಳ
ಹೆಸರುಗಳನ್ನು ದಾಖಲೆ ಸಹಿತವಾಗಿ ಪ್ರಸ್ತಾವನೆ ಸಲ್ಲಿಸಲು ಸೂಚನೆ ನೀಡಲಾಗಿತ್ತು.   ಆದರೆ
ಇದುವರೆಗೂ ಯಾವುದೇ ಅಧಿಕಾರಿಗಳು ಪ್ರಸ್ತಾವನೆ ಸಲ್ಲಿಸಿಲ್ಲ.  ಜ. ೧೮ ರ ಸಂಜೆಯೊಳಗೆ
ಕಳುಹಿಸಿಕೊಡುವಂತೆ ಸೂಚನೆ ನೀಡಿದರು.
     ಅಂದು ನಗರದಲ್ಲಿ ಗವಿಸಿದ್ದೇಶ್ವರ
ಜಾತ್ರೆಯ ಅಂಗವಾಗಿ ಮಹಾರಥೋತ್ಸವ ಜರುಗುವುದರಿಂದ ಸಂಜೆ ಸಾರ್ವಜನಿಕ ಮೈದಾನದಲ್ಲಿ
ಜರುಗಬೇಕಿದ್ದ ಸಾಂಸ್ಕೃತಿಕ ಕಾರ್ಯಕ್ರಮವನ್ನು ರದ್ದುಪಡಿಸಲು ನಿರ್ಧರಿಸಲಾಯಿತು. 
    
ಸಭೆಯಲ್ಲಿ ಜಿ.ಪಂ. ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಆರ್. ರಾಮಚಂದ್ರನ್,
ಉಪವಿಭಾಗಾಧಿಕಾರಿ ಐ.ಎಸ್. ಶಿರಹಟ್ಟಿ, ನಗರಸಭೆ ಉಪಾಧ್ಯಕ್ಷ ಬಾಳಪ್ಪ ಬಾರಕೇರ, ಸೇರಿದಂತೆ
ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು, ಗಣ್ಯರಾದ ಶಿವಾನಂದ ಹೊದ್ಲೂರ್,
ಸಿದ್ದಪ್ಪ ಹಂಚಿನಾಳ ಸಭೆಯಲ್ಲಿ ಭಾಗವಹಿಸಿ ಉಪಯುಕ್ತ ಸಲಹೆ ಸೂಚನೆಗಳನ್ನು ನೀಡಿದರು.

Please follow and like us:
error