ಕೊಪ್ಪಳದಲ್ಲಿ ಶಿಶು-ತಾಯಿ ಮರಣ : ತನಿಖೆಗೆ ಕ್ರಮ – ಆರೋಗ್ಯ ಸಚಿವ ಯು.ಟಿ. ಖಾದರ್

 ಕೊಪ್ಪಳದಲ್ಲಿ ಶಿಶು ಮತ್ತು ತಾಯಿ ಮರಣದ ಪ್ರಮಾಣ ಹೆಚ್ಚಾಗಿರುವುದಾಗಿ ವರದಿಗಳು ಬಂದಿದ್ದು, ಈ ಕುರಿತಂತೆ ಬೆಂಗಳೂರಿನ ಎಂ.ಎಸ್. ರಾಮಯ್ಯ ಆಸ್ಪತ್ರೆ ಕಮ್ಯುನಿಟಿ ಯುನಿಟ್‌ನ ಡಾ. ನಂದಕುಮಾರ್ ಅವರಿಂದ ತನಿಖೆ ನಡೆಸಿ, ಸಮಗ್ರ ವರದಿ ಪಡೆಯಲಾಗುವುದು ಎಂದು ರಾಜ್ಯ ಆರೋಗ್ಯ ಸಚಿವ ಯು.ಟಿ. ಖಾದರ್ ಅವರು ಹೇಳಿದರು.
  ಕೊಪ್ಪಳ ಜಿಲ್ಲಾ ಆಡಳಿತ ಭವನದಲ್ಲಿ ಆರೋಗ್ಯ ಇಲಾಖೆ ಅಧಿಕಾರಿಗಳೊಂದಿಗೆ ಶನಿವಾರ ನಡೆಸಿದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
  ಕೊಪ್ಪಳ ಜಿಲ್ಲೆಯಲ್ಲಿ ಶಿಶು ಮತ್ತು ತಾಯಿ ಮರಣದ ಪ್ರಮಾಣ ಹೆಚ್ಚಾಗಿದೆ ಎಂಬುದಾಗಿ ಮಾಧ್ಯಮಗಳಲ್ಲಿ ವರದಿಗಳು ಪ್ರಕಟವಾದ ಹಿನ್ನೆಲೆಯಲ್ಲಿ, ತಾವೇ ಖುದ್ದಾಗಿ ಪರಿಶೀಲಿಸಲು ಜಿಲ್ಲೆಗೆ ಭೇಟಿ ನೀಡಿದ್ದೇನೆ.  ಶಿಶು ಮತ್ತು ತಾಯಿ ಮರಣದ ಸಮಸ್ಯೆ ಇಡೀ ದೇಶದಲ್ಲಿ ಇದೆ.  ಆದರೂ ಜಿಲ್ಲೆಯಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಸಾವು ಸಂಭವಿಸುತ್ತಿರುವುದು ಕಳವಳಕಾರಿ ಸಂಗತಿಯಾಗಿದೆ.  ಇದಕ್ಕಾಗಿ ಬೆಂಗಳೂರಿನ ಎಂ.ಎಸ್. ರಾಮಯ್ಯ ಆಸ್ಪತ್ರೆ ಕಮ್ಯುನಿಟಿ ಯುನಿಟ್‌ನ ಡಾ. ನಂದಕುಮಾರ್ ಅವರಿಂದ ತನಿಖೆ ನಡೆಸಿ, ಸಮಗ್ರ ವರದಿ ಪಡೆಯಲಾಗುವುದು.  ಈ ವರದಿಯ ಆಧಾರದಲ್ಲಿ ಮುಂದಿನ ಅಗತ್ಯ ಕ್ರಮ ಜರುಗಿಸಲಾಗುವುದು. ಪ್ರಸೂತಿ ಆರೈಕೆ, ಜನನಿ ಸುರಕ್ಷಾ ಯೋಜನೆ, ಮಡಿಲು ಕಿಟ್ ವಿತರಣೆಯಂತಹ ಹಲವಾರು ಯೋಜನೆಗಳು ಜಾರಿಯಲ್ಲಿವೆ.  ಶಿಶು ಮರಣ ಪ್ರಮಾಣ ಕಡಿಮೆಗೊಳಿಸಲು ಆರೋಗ್ಯ ಇಲಾಖೆ ಸಕಾರಾತ್ಮಕ ಕ್ರಮಗಳನ್ನು ಕೈಗೊಳ್ಳಬೇಕು.  ಆಶಾ ಕಾರ್ಯಕರ್ತರ ಸೇವೆಯನ್ನು ಸಮರ್ಪಕವಾಗಿ ಬಳಸಿಕೊಂಡು, ಮನೆಗಳಲ್ಲಿ ಹೆರಿಗೆ ಮಾಡಿಸುವುದನ್ನು ನಿಯಂತ್ರಿಸಿ,  ಹೆರಿಗೆಗಳನ್ನು ಆಸ್ಪತ್ರೆಗಳಲ್ಲಿಯೇ ಮಾಡಿಸಲು ಸೂಕ್ತ ಜಾಗೃತಿ ಮೂಡಿಸಲು ಅಗತ್ಯ ಕ್ರಮ ಕೈಗೊಳ್ಳಬೇಕು.  ಗರ್ಭಿಣಿಯರನ್ನು ಹೆರಿಗೆಯ ನಿಗದಿತ ಅವಧಿಗಿಂತ ಒಂದೆರಡು ವಾರಗಳಿಗೂ ಮುನ್ನವೇ ಆಸ್ಪತ್ರೆಗೆ ಕರೆತಂದು, ತಪಾಸಣೆ ನಡೆಸಿ, ಸೂಕ್ತ ತಿಳುವಳಿಕೆ ಮೂಡಿಸಬೇಕು.  ಮಡಿಲು ಕಿಟ್ ವಿತರಣೆ ಸಮರ್ಪಕವಾಗಿ ನಡೆಯುತ್ತಿಲ್ಲ ಎಂಬ ದೂರುಗಳು ವ್ಯಾಪಕವಾಗಿದ್ದು, ನವಜಾತ ಶಿಶುಗಳಿಗೆ ಸೋಂಕು ತಗುಲದಂತೆ ಮಾಡಲು ಸಕಾಲದಲ್ಲಿ ಮಡಿಲು ಕಿಟ್ ವಿತರಣೆಯಾಗುವಂತೆ ನೋಡಿಕೊಳ್ಳಬೇಕು.  ಕೊಪ್ಪಳದಲ್ಲಿ ಮುಂದಿನ ವರ್ಷದಿಂದ ಮೆಡಿಕಲ್ ಕಾಲೇಜು ಪ್ರಾರಂಭಿಸಲು ಎಲ್ಲ ಸಿದ್ಧತೆಗಳನ್ನು ನಡೆಸಲಾಗುತ್ತಿದ್ದು, ಮೆಡಿಕಲ್ ಕಾಲೇಜು ಪ್ರಾರಂಭವಾದಲ್ಲಿ, ಜಿಲ್ಲೆಯಲ್ಲಿ ಆರೋಗ್ಯ ಸೇವೆ ಇನ್ನಷ್ಟು ಉತ್ತಮಗೊಳ್ಳಲಿದೆ. ತಾಲೂಕು ವೈದ್ಯಾಧಿಕಾರಿಗಳು ತಿಂಗಳಿಗೊಮ್ಮೆಯಾದರೂ ಪ್ರತಿಯೊಂದು ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಭೇಟಿ ನೀಡಿ, ಅಲ್ಲಿನ ಗ್ರಾ.ಪಂ. ಪ್ರತಿನಿಧಿಗಳು, ಸಾರ್ವಜನಿಕರೊಂದಿಗೆ ಸಮಾಲೋಚನೆ ನಡೆಸಿ, ಸ್ಥಳೀಯ ಸಮಸ್ಯೆಗಳನ್ನು ಅರಿತುಕೊಳ್ಳುವುದಲ್ಲದೆ, ಸುರಕ್ಷಿತ ಹೆರಿಗೆಗೆ ಸಂಬಂಧಿಸಿದಂತೆ ಜಾಗೃತಿ ಮೂಡಿಸಬೇಕು.  ಆಸ್ಪತ್ರೆಗಳಿಗೆ ಬಿಡುಗಡೆ ಮಾಡಲಾಗುವ ಅನುದಾನವನ್ನು ಸಮರ್ಪಕವಾಗಿ ವಿನಿಯೋಗಿಸಿಕೊಂಡು, ಉತ್ತಮ ಆರೋಗ್ಯ ಸೇವೆ ನೀಡುವಂತಾಗಬೇಕು.  ಜಿಲ್ಲೆಯಲ್ಲಿ ಬಾಲ್ಯ ವಿವಾಹ ಹೆಚ್ಚಿನ ಪ್ರಮಾಣದಲ್ಲಿ ನಡೆಯುವ ಬಗ್ಗೆ ವರದಿ ಇದ್ದು, ಬಾಲ್ಯ ವಿವಾಹ ತಡೆಗಟ್ಟಲು ಜಿಲ್ಲಾಡಳಿತ, ಯುನಿಸೆಫ್ ಮತ್ತು ವಿವಿಧ ಇಲಾಖೆಗಳು ಪ್ರಾಮಾಣಿಕ ಪ್ರಯತ್ನ ಮಾಡುತ್ತಿವೆ.  ಆದರೂ ಇದನ್ನು ಸಂಪೂರ್ಣವಾಗಿ ನಿರ್ಮೂಲನೆ ಮಾಡುವ ಅಗತ್ಯವಿದೆ.  ಈ ನಿಟ್ಟಿನಲ್ಲಿ ಸಾರ್ವಜನಿಕರು ಜಾಗೃತಿ ಹೊಂದುವುದು ಅಗತ್ಯವಾಗಿದೆ ಎಂದರು.
ಶಾಲಾ ಮಕ್ಕಳ ಕಣ್ಣಿನ ಪರೀಕ್ಷೆ ಮಾಡಿಸಿ : ಜಿಲ್ಲೆಯಲ್ಲಿ ಅಂಧತ್ವ ನಿವಾರಣಾ ಯೋಜನೆಯಡಿ ಉಚಿತ ನೇತ್ರ ಚಿಕಿತ್ಸಾ ಶಿಬಿರಗಳನ್ನು ಸಮರ್ಪಕವಾಗಿ ನಡೆಸುತ್ತಿಲ್ಲ.  ಕೇವಲ ಸ್ವಯಂ ಸೇವಾ ಸಂಸ್ಥೆಗಳು ಮತ್ತು ಖಾಸಗಿ ಆಸ್ಪತ್ರೆಗಳು ನಡೆಸುವ ನೇತ್ರ ಚಿಕಿತ್ಸಾ ಶಿಬಿರಗಳನ್ನೆ ಇಲಾಖೆಯ ಸಾಧನೆಯೆಂದು ಬಿಂಬಿಸುತ್ತಿರುವುದು ಸರಿಯಲ್ಲ.  ಸ್ವಯಂ ಸೇವಾ ಸಂಸ್ಥೆಗಳ ನೆರವನ್ನು ಪಡೆದು, ಇಲಾಖೆಯೇ ಉಚಿತ ಶಿಬಿರಗಳನ್ನು ಜಿಲ್ಲೆಯಾದ್ಯಂತ ಹಮ್ಮಿಕೊಳ್ಳಬೇಕು.  ಖಾಸಗಿ ಆಸ್ಪತ್ರೆಗಳ ಕಣ್ಣಿನ ತಜ್ಞ ವೈದ್ಯರ ನೆರವನ್ನು ಪಡೆದು, ಜಿಲ್ಲೆಯ ಎಲ್ಲಾ ಶಾಲಾ ಮಕ್ಕಳ ಕಣ್ಣಿನ ಪರೀಕ್ಷೆ ನಡೆಸುವ ಕಾರ್ಯ ಕೈಗೊಳ್ಳಬೇಕು.  ಸರ್ಕಾರ ಇದಕ್ಕಾಗಿ ಆರ್ಥಿಕ ನೆರವು ನೀಡಲು ಸಿದ್ಧವಿದೆ ಎಂದು ಸಚಿವರು ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಅಪೌಷ್ಠಿಕತೆ ನಿವಾರಣೆ : ಕೊಪ್ಪಳ ಜಿಲ್ಲೆಯಲ್ಲಿ ಅಪೌಷ್ಠಿಕತೆಯ ನಿವಾರಣೆಗಾಗಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಮತ್ತು ಆರೋಗ್ಯ ಇಲಾಖೆಗಳು ಸಮನ್ವಯತೆಯಿಂದ ಕಾರ್ಯ ನಿರ್ವಹಿಸಬೇಕಿದೆ.  ಜಿಲ್ಲೆಯಲ್ಲಿ ೩೭೬೫ ಅಪೌಷ್ಠಿಕ ಮಕ್ಕಳನ್ನು ಗುರುತಿಸಲಾಗಿದ್ದು, ಈ ಮಕ್ಕಳ ಆರೋಗ್ಯ ಸುಧಾರಣೆಗೆ ಪೂರಕ ಪೌಷ್ಠಿಕ ಆಹಾರ ಸಮರ್ಪಕವಾಗಿ ವಿತರಣೆಯಾಗಬೇಕು.  ನಿಗದಿತ ಅವಧಿಯ ನಂತರವೂ ಆರೋಗ್ಯ ಸುಧಾರಣೆಯಾಗದ ಮಕ್ಕಳ ಬಗ್ಗೆ ವಿಶೇಷ ಕಾಳಜಿ ವಹಿಸುವ ಅಗತ್ಯವಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಯು.ಟಿ. ಖಾದರ್ ಅವರು ಹೇಳಿದರು.
 ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಮಹಾದೇವಸ್ವಾಮಿ ಅವರು ಈ ಸಂದರ್ಭದಲ್ಲಿ ಮಾತನಾಡಿ, ಶಿಶು ಮತ್ತು ತಾಯಿ ಮರಣ ಪ್ರಮಾಣ ನಮ್ಮ ರಾಜ್ಯದ ಇತರೆ ಜಿಲ್ಲೆಗಳಿಗೆ ಹೋಲಿಸಿದಲ್ಲಿ, ಕೊಪ್ಪಳ ಜಿಲ್ಲೆಯಲ್ಲಿ ಕಡಿಮೆ ಇದೆ.  ಬೆಳಗಾವಿ ಜಿಲ್ಲೆಯಲ್ಲಿ ಈ ವರ್ಷ ೨೧೦೧೪ ಶಿಶು ಜನನಗಳ ಪೈಕಿ ೨೭೮ ಶಿಶುಗಳು ಮರಣ ಹೊಂದಿವೆ.  ಯಾದಗಿರಿ ಜಿಲ್ಲೆಯಲ್ಲಿ ೮೩೪೭ ಶಿಶು ಜನನವಾಗಿದ್ದು, ೧೩೫ ಸಾವು ಸಂಭವಿಸಿದೆ.  ಬಾಗಲಕೋಟೆ ಜಿಲ್ಲೆಯಲ್ಲಿ ೬೨೧೫ ಶಿಶು ಜನನಗಳ ಪೈಕಿ ೨೨೩ ಶಿಶುಗಳು ಮರಣ ಹೊಂದಿವೆ.  ಕೊಪ್ಪಳ ಜಿಲ್ಲೆಯಲ್ಲಿ ೭೦೮೬ ಶಿಶು ಜನನಗಳ ಪೈಕಿ ೧೬೮ ಮರಣ ಹೊಂದಿವೆ.   ಆದಾಗ್ಯೂ ಶಿಶು ಮತ್ತು ತಾಯಿ ಮರಣ ಕಡಿಮೆಗೊಳಿಸಲು ಇಲಾಖೆ ತೀವ್ರವಾಗಿ ಯತ್ನಿಸುತ್ತಿದ್ದು, ಬಾಲ್ಯ ವಿವಾಹ ಹಾಗೂ ಮನೆಗಳಲ್ಲಿಯೇ ಹೆರಿಗೆ ಮಾಡಿಸುವ ಪ್ರಮಾಣ ಹೆಚ್ಚಿದೆ.  ತಜ್ಞ ವೈದ್ಯರ ಕೊರತೆಯಿಂದಾಗಿ ಇದಕ್ಕೆ ತೊಂದರೆ ಉಂಟಾಗಿದೆ ಎಂದರು.
  ಸಭೆಯಲ್ಲಿ ಜಿಲ್ಲಾಧಿಕಾರಿ ಕೆ.ಪಿ. ಮೋಹನ್‌ರಾಜ್, ಜಿಲ್ಲಾ ಪಂಚಾಯತಿ ಅಧ್ಯಕ್ಷ ಟಿ. ಜನಾರ್ಧನ ಹುಲಿಗಿ, ನಗರಸಭೆ ಅಧ್ಯಕ್ಷೆ ಲತಾ ಸಂಡೂರ, ಉಪಾಧ್ಯಕ್ಷ ಅಮ್ಜದ್ ಪಟೇಲ್, ಜಿಲ್ಲಾ ಶಸ್ತ್ರಚಿಕಿತ್ಸಕ ಡಾ. ಲೋಕೇಶ್, ತಾಲೂಕು ವೈದ್ಯಾಧಿಕಾರಿಗಳಾದ ಡಾ. ಪ್ರಶಾಂತ್‌ಬಾಬು, ಡಾ. ದಾನರೆಡ್ಡಿ, ಡಾ. ಎಸ್.ಕೆ. ದೇಸಾಯಿ, ಡಾ. ರಮೇಶ್ ಮೂಲಿಮನಿ, ಡಾ. ಕಟ್ಟಿಮನಿ, ಆರೋಗ್ಯ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸೇರಿದಂತೆ ವಿವಿಧ ಅಧಿಕಾರಿಗಳು ಭಾಗವಹಿಸಿದ್ದರು
ಆರೋಗ್ಯ ಸಚಿವರಿಂದ ಕೊಪ್ಪಳ ಜಿಲ್ಲಾಸ್ಪತ್ರೆ ಪರಿಶೀಲನೆ 

ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಯು.ಟಿ. ಖಾದರ್ ಅವರು ಕೊಪ್ಪಳ ನಗರದ   ಜಿಲ್ಲಾ ನೂತನ ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

  ಜಿಲ್ಲಾ ಆಸ್ಪತ್ರೆ ಅವ್ಯವಸ್ಥೆಯಿಂದ ಕೂಡಿದ್ದು, ಸಮರ್ಪಕ ಸೇವೆ ಲಭ್ಯವಾಗುತ್ತಿಲ್ಲ ಎಂಬುದಾಗಿ ಸಾರ್ವಜನಿಕರು ಸಚಿವರಿಗೆ ದೂರು ಸಲ್ಲಿಸಿದ ಹಿನ್ನೆಲೆಯಲ್ಲಿ ಜಿಲ್ಲಾ ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.  ಜಿಲ್ಲಾ ಆಸ್ಪತ್ರೆಯ ವಿವಿಧ ವಾರ್ಡುಗಳಿಗೆ ಭೇಟಿ ನೀಡಿದ ಸಚಿವರು, ಚಿಕಿತ್ಸೆಗೆ ದಾಖಲಾಗಿದ್ದ ವಿವಿಧ ರೋಗಿಗಳ ಆರೋಗ್ಯ ವಿಚಾರಣೆ ನಡೆಸಿದರು.  ಜಿಲ್ಲಾ ಆಸ್ಪತ್ರೆಯ ನೂತನ ಕಟ್ಟಡ ಕೆಲವು ಕಡೆಗಳಲ್ಲಿ ಮಳೆ ನೀರು ಸೋರಿಕೆಯಾಗುತ್ತಿರುವುದನ್ನು ಗಮನಿಸಿದ ಸಚಿವರು, ಕೂಡಲೆ ಸಂಬಂಧಿಸಿದ ಗುತ್ತಿಗೆದಾರರಿಂದ ದುರಸ್ತಿ ಕಾರ್ಯ ಕೈಗೊಳ್ಳುವಂತೆ ಸೂಚನೆ ನೀಡಿದರು.  
  ಜಿಲ್ಲಾಧಿಕಾರಿ ಕೆ.ಪಿ. ಮೋಹನ್ ರಾಜ್, ಜಿ.ಪಂ. ಅಧ್ಯಕ್ಷ ಟಿ. ಜನಾರ್ಧನ ಹುಲಿಗಿ, ಜಿಲ್ಲಾ ಶಸ್ತ್ರ ಚಿಕಿತ್ಸಕ ಡಾ. ಲೋಕೇಶ್ ಸೇರಿದಂತೆ ವಿವಿಧ ಅಧಿಕಾರಿಗಳು, ಗಣ್ಯರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
Please follow and like us:
error